ಎಂಎಂ ಕಲಬುರ್ಗಿ, ಗೌರಿ ಲಂಕೇಶ್ ಹತ್ಯೆ ಪ್ರಕರಣ: ವಿಶೇಷ ಕೋರ್ಟ್ ಸ್ಥಾಪನೆಗೆ ಸಿಎಂ ಸೂಚನೆ
gauri lankesh And MM Kalburgi Murder Case: ಸಂಶೋಧಕ ಎಂ.ಎಂ. ಕಲಬುರ್ಗಿ ಹಾಗೂ ಪತ್ರಕರ್ತೆ ಗೌರಿ ಲಂಕೇಶ್ ಅವರ ಕೊಲೆ ಪ್ರಕರಣಗಳ ತ್ವರಿತ ವಿಚಾರಣೆಗೆ ರಾಜ್ಯದಲ್ಲಿ ವಿಶೇಷ ಕೋರ್ಟ್ ಸ್ಥಾಪನೆಗೆ ರಾಜ್ಯ ಸರ್ಕಾರ ತೀರ್ಮಾನಿಸಿದೆ. ಈ ಬಗ್ಗೆ ಸ್ವತಃ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೇ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ಬೆಂಗಳೂರು, (ಡಿಸೆಂಬರ್ 06): ಎಂ ಎಂ ಕಲಬುರ್ಗಿ ಮತ್ತು ಗೌರಿ ಲಂಕೇಶ್ ಹತ್ಯೆ ಪ್ರಕರಣಕ್ಕೆ(gauri lankesh And MM Kalburgi Murder Case:) ಸಂಬಂಧಿಸಿದಂತೆ ಪ್ರತ್ಯೇಕ ವಿಶೇಷ ನ್ಯಾಯಾಲಯ ರಚನೆ ಜೊತೆ ಪೂರ್ಣವಧಿ ನ್ಯಾಯಾಧೀಶರ ನೇಮಕಕ್ಕೆ ಸಿಎಂ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ. ಈ ಬಗ್ಗೆ ಸರ್ಕಾರದ ಅಪಾರ ಮುಖ್ಯಕಾರ್ಯದರ್ಶಿಗೆ ಟಿಪ್ಪಣಿ ಮೂಲಕ ಸೂಚಿಸಿದ್ದಾರೆ.
ಬಲಪಂಥೀಯ ಸಿದ್ಧಾಂತಗಳನ್ನು ವಿರೋಧಿಸುತ್ತಾ ತಮ್ಮದೇ ಸಾಮಾಜಿಕ ಹೋರಾಟಗಳನ್ನು ಮಾಡುತ್ತಿದ್ದ ಪತ್ರಕರ್ತೆ ಗೌರಿ ಲಂಕೇಶ್ ಹಾಗೂ ಕನ್ನಡ ಸಾಹಿತ್ಯ ಸಂಶೋಧಕ ಎಂ.ಎಂ. ಕಲಬುರ್ಗಿ ಅವರನ್ನು ಗುಂಡಿಕ್ಕಿ ಹತ್ಯೆ ಮಾಡಲಾಗಿತ್ತು. ಇನ್ನು ಹತ್ಯೆ ಮಾಡಿದ ಆರೋಪಿಗಳನ್ನು ಪೊಲೀಸರು ಬಂಧಿಸಲಾಗಿದ್ದರೂ, ಹತ್ಯೆಗೆ ಯಾರು ಸುಪಾರಿ ಕೊಟ್ಟಿದ್ದು ಯಾವ ಉದ್ದೇಶಕ್ಕಾಗಿ ಕೊಲೆ ಮಾಡಲಾಗಿದೆ ಎನ್ನುವ ಸತ್ಯಾಂಶ ತಿಳಿದುಬಂದಿಲ್ಲ. ಅಲ್ಲದೇ ಹಲವು ವರ್ಷಗಳಿಂದ ಈ ಪ್ರಕರಣ ನಿಧಾನಗತಿಯಲ್ಲಿ ವಿಚಾರಣೆ ಮಾಡಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಎರಡು ಪ್ರಕರಣಗಳ ತ್ವರಿತ ವಿಚಾರಣೆಗೆ ವಿಶೇಷ ನ್ಯಾಯಾಲಯ ರಚಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚಿಸಿದ್ದಾರೆ.
ಎಂಎಂ ಕಲಬುರ್ಗಿ ಅವರನ್ನು 2015 ಆಗಸ್ಟ್ 31ರಂದು ಧಾರವಾಡದ ಅವರ ಸ್ವಗೃಹದಲ್ಲಿ ಗುಂಡಿಕ್ಕಿ ಹತ್ಯೆ ಮಾಡಲಾಗಿತ್ತು. ಆದರೆ, ಏಳು ವರ್ಷಗಳು ಪೂರ್ಣಗೊಂಡಿವೆ. ಪ್ರಕರಣದ ಸಂಬಂಧ ನ್ಯಾಯಾಲಯಕ್ಕೆ ಚಾರ್ಜ್ ಶೀಟ್ ಸಲ್ಲಿಕೆಯಾಗಿದ್ದು, ಮೃತರ ಕುಟುಂಬದವರ ವಿಚಾರಣೆಗಳು ಪೂರ್ಣಗೊಂಡಿದ್ದರೂ ನ್ಯಾಯಾಲಯದಲ್ಲಿ ವಿಚಾರಣೆಗಳು ಮುಂದುವರೆದಿವೆ. ಈಗಾಗಲೇ ಸಾಕಷ್ಟು ಸಮಯ ಆಗಿರುವುದರಿಂದ ವಿಶೇಷ ನ್ಯಾಯಾಲಯ ರಚಿಸುವಂತೆ ಎಂಎಂ ಕಲಬುರ್ಗಿ ಪತ್ನಿ ಉಮಾದೇವಿ ಅವರು ಕೋರಿದ್ದು, ಈ ಸಂಬಂಧ ಜರೂರು ಅಗತ್ಯ ಕ್ರಮವಹಿಸಲು ಸಿಎಂ ಅಧಿಕಾರಿಗಳಿಗೆ ಸೂಚಿಸಿದ್ದಾರೆ.
ಇನ್ನು ಪತ್ರಕರ್ತೆ ಹಾಗೂ ಸಾಮಾಜಿಕ ಕಾರ್ಯಕರ್ತೆಯಾಗಿದ್ದ ಗೌರಿ ಲಂಕೇಶ್ ಅವರನ್ನು 2017, ಸೆಪ್ಟೆಂಬರ್ 05 ರಂದು ಗುಂಡಿಕ್ಕಿ ಹತ್ಯೆಗೀಡಾಗಿದ್ದು, ಈ ಸಂಬಂಧ ವಿಶೇಷ ತನಿಖಾ ದಳ ರಚಿಸಲಾಗಿದೆ. ಇದುವರೆಗೂ 18 ಆರೋಪಿಗಳು ಬಂಧನಕ್ಕೊಳಗಾಗಿದ್ದು, 1200 ಪುರಾವೆ ಹಾಗೂ 500 ಕ್ಕೂ ವಿವಿಧ ಬಗೆಯ ಸಾಕ್ಷ್ಯಗಳನ್ನೊಳಗೊಂಡ ಚಾರ್ಜ್ ಶೀಟ್‌ನ್ನು ನ್ಯಾಯಾಲಯಕ್ಕೆ ಸಲ್ಲಿಸಲಾಗಿದೆ.
ಪ್ರಕರಣದ ವಿಚಾರಣೆಯು ನ್ಯಾಯಾಲಯದಲ್ಲಿ ಜುಲೈ, 2022 ರಿಂದ ಪ್ರಾರಂಭಗೊಂಡಿದ್ದು, ನ್ಯಾಯಾಲಯದ ಅನುದಿನದ ಪ್ರಕರಣಗಳು ಸಾಕಷ್ಟು ಸಂಖ್ಯೆಯಲ್ಲಿ ಇರುವುದರಿಂದ ವಿಚಾರಣೆಯು ನಿಧಾನಗತಿಯಲ್ಲಿ ಸಾಗಿದೆ. ಆದ್ದರಿಂದ, ಈ ಪ್ರಕರಣದ ವಿಚಾರಣೆಗೆ ವಿಶೇಷ ನ್ಯಾಯಾಲಯ ರಚಿಸಿ, ಪೂರ್ಣಾವಧಿ ನ್ಯಾಯಾಧೀಶರನ್ನು ನೇಮಕ ಮಾಡುವಂತೆ ಗೌರಿ ಲಂಕೇಶ್ ಸಹೋದರಿ ಕವಿತಾ ಲಂಕೇಶ್ ರವರು ಸರ್ಕಾರಕ್ಕೆ ಕೋರಿದ್ದು. ಈ ಬಗ್ಗೆ ಜರೂರು ಅಗತ್ಯ ಕ್ರಮವಹಿಸಲು ಸಿದ್ದರಾಮಯ್ಯ ಸೂಚನೆ ಹೊರಡಿಸಿದ್ದಾರೆ.
ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published On - 12:41 pm, Wed, 6 December 23