ಬೆಂಗಳೂರು, (ನವೆಂಬರ್ 10): ಮುಡಾ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ಆದೇಶದ ಬಗ್ಗೆ ಮಾತನಾಡಿದ್ದ ಸಚಿವ ಜಮೀರ್ ಅಹಮ್ಮದ್ ಖಾನ್ ಇದೀಗ ಸಂಕಷ್ಟ ಎದುರಾಗಿದೆ. ಮುಡಾ ಅಕ್ರಮಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ವಿರುದ್ಧ ಹೈಕೋರ್ಟ್ (Karnataka Highcourt) ನೀಡಿದ ತೀರ್ಪಿನ ಬಗ್ಗೆ ಆಕ್ಷೇಪಾರ್ಹ ಹೇಳಿಕೆ ನೀಡಿ ನ್ಯಾಯಾಂಗ ನಿಂದನೆ ಆರೋಪ ಎದುರಿಸುತ್ತಿರುವ ಜಮೀರ್ ಅಹ್ಮದ್ ಖಾನ್ (Zameer Ahmed Khan) ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ರಾಜ್ಯಾಪಾಲರ ಥಾವರ್ ಚೆಂದ್ ಗೆಹ್ಲೋಟ್ ಅವರು ಸರ್ಕಾರದ ಅಡ್ವೋಕೇಟ್ ಜನರಲ್ ಗೆ ಸೂಚನೆ ನೀಡಿದ್ದಾರೆ.
ಸಾಮಾಜಿಕ ಕಾರ್ಯಕರ್ತ ಟಿಜೆ ಅಬ್ರಾಹಮ್ ದೂರಿನ ಮೇರೆಗೆ ಸಚಿವ ಜಮೀರ್ ಅಹಮ್ಮದ್ ಹೇಳಿಕೆ ಸಂಬಂಧ ಅಡ್ವೋಕೇಟ್ ಜನರಲ್‌ಗೆ ರಾಜ್ಯಪಾಲರು ಪತ್ರ ಬರೆದಿದ್ದು, ಮುಂದಿನ ಕಾನೂನು ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದ್ದಾರೆ.
ಇದನ್ನೂ ಓದಿ: ತಿಂಗಳು ಕಳೆದರೂ ಜಮೀರ್ ವಿರುದ್ಧ ಕ್ರಮಕ್ಕೆ ಮುಂದಾಗದ ಎಜಿಯನ್ನು ವಜಾ ಮಾಡಬೇಕು: ಅಬ್ರಹಾಂ
ಮುಡಾ ನಿವೇಶನ ಹಂಚಿಕೆ ಪ್ರಕರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಕಾನೂನು ಕ್ರಮ ಜರುಗಿಸುವಂತೆ ಟಿಜೆ ಅಬ್ರಾಹಮ್ ರಾಜ್ಯಪಾಲರಿಗೆ ದೂರು ನೀಡಿದ್ದರು. ಬಳಿಕ ರಾಜ್ಯಪಾಲರು ಸಿದ್ದರಾಮಯ್ಯ ವಿರುದ್ಧ ತನಿಗೆ ಅನುಮತಿ ನೀಡಿದ್ದರು. ಇದನ್ನು ಪ್ರಶ್ನಿಸಿ ಸಿಎಂ, ಕೋರ್ಟ್ ಮೆಟ್ಟಿಲೇರಿದ್ದರು. ಆದ್ರೆ, ಹೈಕೋರ್ಟ್ ಸಿಎಂ ವಿರುದ್ಧದ ತನಿಖೆಗೆ ಆದೇಶಿಸಿತ್ತು. ಈ ತೀರ್ಪನ್ನು ಜಮೀರ್ ಅಹಮ್ಮದ್ ಖಾನ್, ರಾಜಕೀಯ ಪ್ರೇರಿತವಾಗಿದ್ದು, ಅದೊಂದು ರಾಜಕೀಯ ತೀರ್ಪು ಎಂದು ಹೇಳಿದ್ದರು. ಆ ಹಿನ್ನೆಲೆಯಲ್ಲಿ ಮುಡಾ ದೂರುದಾರರಲ್ಲೊಬ್ಬರಾದ ಟಿ.ಜೆ. ಅಬ್ರಹಾಂ ಅವರು ಜಮೀರ್ ಅವರ ವಿರುದ್ಧ ನ್ಯಾಯಾಂಗ ನಿಂದನೆ ಕೇಸ್ ದಾಖಲಿಸಿ ಪಾಠ ಕಲಿಸುವುದಾಗಿ ಹೇಳಿದ್ದರು.
ಜಮೀರ್ ಅಹಮ್ಮದ್ ಖಾನ್ ಅವರು ಈ ಹೇಳಿಕೆ ರಾಜ್ಯ ರಾಜಕಾರಣದಲ್ಲಿ ಭಾರೀ ಸಂಚಲನಕ್ಕೆ ಕಾರಣವಾಗಿತ್ತು. ಅಲ್ಲದೇ ಜಮೀರ್ ಅಹಮ್ಮದ್ ಖಾನ್ ಅವರು ನ್ಯಾಯಾಂಗ ನಿಂದನೆ ಮಾಡಿದ್ದಾರೆ ಎಂದು ಅಬ್ರಾಹಂ ಕಿಡಿಕಾರಿದ್ದರು. ಮತ್ತೊಂದು ಹೆಜ್ಜೆ ಮುಂದೆ ಹೋಗಿ ಜಮೀರ್ ಅಹಮ್ಮದ್ ವಿರುದ್ಧ ರಾಜ್ಯಪಾಲರಿಗೆ ದೂರು ನೀಡಿದ್ದರು. ಇದೀಗ ಈ ದೂರಿನ ಮೇರೆಗೆ ರಾಜ್ಯಪಾಲರು ಜಮೀರ್ ವಿರುದ್ಧ ಕ್ರಮಕ್ಕೆ ಸೂಚಿಸಿದ್ದಾರೆ.
ಕರ್ನಾಟಕದ ಮತ್ತಷ್ಟು ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ