ಬೆಂಗಳೂರು: ಸರ್ಕಾರಿ ಕಚೇರಿಗಳಲ್ಲಿ ಸಾರ್ವಜನಿಕರು ಫೋಟೊ ಹಾಗೂ ವಿಡಿಯೊ ಚಿತ್ರೀಕರಣ ನಡೆಸುವಂತಿಲ್ಲ ಎಂದು ಆಡಳಿತ ಸುಧಾರಣಾ ಇಲಾಖೆಯಿಂದ ಆದೇಶ ಹೊರಡಿಸಿದೆ. ಕೆಲವರು ಸರ್ಕಾರಿ ಕಚೇರಿಗಳ ವಿಡಿಯೊಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ದುರ್ಬಳಕೆ ಮಾಡಿಕೊಳ್ಳುತ್ತಿದ್ದ ಆರೋಪ ಕೇಳಿ ಬಂದ ಹಿನ್ನೆಲೆಯಲ್ಲಿ ಸರ್ಕಾರ ಈ ನಿರ್ಧಾರ ತೆಗೆದುಕೊಂಡಿದೆ. ಈ ಸಂಬಂಧ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ನೌಕರರ ಸಂಘವು ಸರ್ಕಾರಕ್ಕೆ ಮನವಿ ಸಲ್ಲಿಸಿತ್ತು. ‘ಸರ್ಕಾರಿ ಕಚೇರಿಗಳಿಗೆ ಕಚೇರಿ ವೇಳೆಯಲ್ಲಿ ಬಂದು, ಖಾಸಗಿ ವ್ಯಕ್ತಿಗಳು ಅನಧಿಕೃತವಾಗಿ ಫೋಟೊ / ವಿಡಿಯೊ ಮಾಡಿ, ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವ ಮೂಲಕ ಇಲಾಖೆ ಹಾಗೂ ಸರ್ಕಾರದ ಘನತೆಗೆ ಕುಂದುಂಟು ಮಾಡುತ್ತಿದ್ದಾರೆ. ವಿಶೇಷವಾಗಿ ಮಹಿಳಾ ನೌಕರರಿಗೆ ಸಮಸ್ಯೆಯಾಗುತ್ತಿದೆ’ ಎಂದು ನೌಕರರ ಸಂಘವು ಅಹವಾಲು ಸಲ್ಲಿಸಿತ್ತು.
ಈ ಮನವಿಯನ್ನು ಪರಿಶೀಲಿಸಿದ ರಾಜ್ಯ ಸರ್ಕಾರವು, ರಾಜ್ಯ ಸರ್ಕಾರದ ಎಲ್ಲ ಇಲಾಖೆಗಳ ಕಚೇರಿಗಳಲ್ಲಿ ಕಚೇರಿ ವೇಳೆಯಲ್ಲಿ ಅನುಮತಿಯಿಲ್ಲದೆ ಸಾರ್ವಜನಿಕರು ಅನಧಿಕೃತವಾಗಿ ಫೋಟೊ / ವಿಡಿಯೊ ಮಾಡುವುದನ್ನು ನಿಷೇಧಿಸಿ ಆದೇಶಿಸಲಾಗಿದೆ ಎಂದು ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಸಿ.ವೆಂಕಟೇಶಪ್ಪ ಆದೇಶ ಹೊರಡಿಸಿದ್ದಾರೆ.