
ಬೆಂಗಳೂರು, ಸೆಪ್ಟೆಂಬರ್ 1: ರಾಜ್ಯದ ಗೃಹಲಕ್ಷ್ಮೀ ಯೋಜನೆಯ (Gruhalakshmi Scheme) ಫಲಾನುಭವಿಗಳಿಗೆ ಶೀಘ್ರದಲ್ಲೇ 33ನೇ ಕಂತಿನ ಹಣ ಬಿಡುಗಡೆಯಾಗುವ ಸಾಧ್ಯತೆ ಇದೆ. ಮುಖ್ಯಮಂತ್ರಿ ಡಿಕೆ ಶಿವಕುಮಾರ್ (DK Shivakumar) ನೇತೃತ್ವದಲ್ಲಿ ಸೋಮವಾರ ನಡೆದ ಗ್ಯಾರಂಟಿ ಅನುಷ್ಠಾನ ಪ್ರಾಧಿಕಾರದ ಸಭೆಯಲ್ಲಿ ಮುಂದಿನ ಕಂತಿನ ಹಣ ಬಿಡುಗಡೆ ಕುರಿತು ಚರ್ಚೆಯಾಗಿದ್ದು, ಈ ಬಗ್ಗೆ ಸಿಎಂ ಸುಳಿವು ನೀಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಗ್ಯಾರಂಟಿ ಯೋಜನೆಗಳ ಅನುಷ್ಠಾನ ಮತ್ತು ಫಲಾನುಭವಿಗಳ ಪರಿಶೀಲನೆ ಕುರಿತು ನಡೆದ ಸಭೆಯಲ್ಲಿ ಗೃಹಲಕ್ಷ್ಮೀ ಸೇರಿದಂತೆ ಪ್ರಮುಖ ಗ್ಯಾರಂಟಿ ಯೋಜನೆಗಳ ಸ್ಥಿತಿಗತಿ ಬಗ್ಗೆ ಚರ್ಚೆ ನಡೆದಿದೆ. ಹೀಗಾಗಿ ಗೃಹಲಕ್ಷ್ಮೀ ಹಣಕ್ಕಾಗಿ ಕಾಯುತ್ತಿರುವ ಫಲಾನುಭವಿಗಳಿಗೆ ಶೀಘ್ರದಲ್ಲೇ ಹಣ ಜಮೆಯಾಗುವ ನಿರೀಕ್ಷೆ ಮೂಡಿದೆ.
ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಪಂಚ ಗ್ಯಾರಂಟಿ ಯೋಜನೆಗಳು ಬಡ ಮತ್ತು ಮಧ್ಯಮ ವರ್ಗದ ಕುಟುಂಬಗಳಿಗೆ ನೆರವಾಗುತ್ತಿವೆ. ಆದರೆ ಕೆಲ ಅನರ್ಹರು ಯೋಜನೆಗಳ ಪ್ರಯೋಜನ ಪಡೆಯುತ್ತಿರುವ ಆರೋಪಗಳ ಹಿನ್ನೆಲೆಯಲ್ಲಿ ಫಲಾನುಭವಿಗಳ ಮರುಪರಿಶೀಲನೆಗೆ ಸರ್ಕಾರ ಮುಂದಾಗಿದೆ.
ಮುಖ್ಯವಾಗಿ ಗೃಹಜ್ಯೋತಿ ಮತ್ತು ಗೃಹಲಕ್ಷ್ಮೀ ಯೋಜನೆಗಳ ಫಲಾನುಭವಿಗಳ ಅರ್ಹತೆ ಪರಿಶೀಲನೆ ಕುರಿತು ಸಭೆಯಲ್ಲಿ ಮಹತ್ವದ ಚರ್ಚೆ ನಡೆದಿದೆ. ಗೃಹಜ್ಯೋತಿ ಯೋಜನೆಯ ಪರಿಶೀಲನಾ ಅವಧಿಯನ್ನು ವಿಸ್ತರಿಸಲಾಗಿದ್ದು, ಸೆಪ್ಟೆಂಬರ್ 30ರವರೆಗೆ ಪರಿಶೀಲನೆ ಮುಂದುವರಿಯಲಿದೆ.
ಜುಲೈ 1ರಿಂದ ಆರಂಭವಾದ ಪರಿಶೀಲನಾ ಕಾರ್ಯದಲ್ಲಿ ರಾಜ್ಯದ ಒಟ್ಟು 1.67 ಕೋಟಿ ಮನೆಗಳ ಪೈಕಿ 1.17 ಕೋಟಿ ಮನೆಗಳ ಪರಿಶೀಲನೆ ಪೂರ್ಣಗೊಂಡಿದೆ. ಈ ಪರಿಶೀಲನೆ ವೇಳೆ ಸುಮಾರು 3 ಲಕ್ಷ ಫಲಾನುಭವಿಗಳು ಯೋಜನೆಯಿಂದ ಸ್ವಯಂ ಹೊರಗುಳಿಯಲು ಸಿದ್ಧರಾಗಿದ್ದಾರೆ ಎಂಬ ಮಾಹಿತಿಯನ್ನು ಸಮಿತಿ ಸದಸ್ಯರು ಮುಖ್ಯಮಂತ್ರಿಗಳಿಗೆ ನೀಡಿದ್ದಾರೆ.
ಅನರ್ಹ ಫಲಾನುಭವಿಗಳನ್ನು ಗುರುತಿಸಿ ಗ್ಯಾರಂಟಿ ಯೋಜನೆಗಳ ವ್ಯಾಪ್ತಿಯಿಂದ ಹೊರಗಿಡುವ ಮೂಲಕ ಸರ್ಕಾರದ ಮೇಲಿನ ಅನಗತ್ಯ ಆರ್ಥಿಕ ಹೊರೆಯನ್ನು ಕಡಿಮೆ ಮಾಡುವ ಉದ್ದೇಶ ಹೊಂದಲಾಗಿದೆ.
ಗೃಹಜ್ಯೋತಿ ಮತ್ತು ಗೃಹಲಕ್ಷ್ಮೀ ಮಾತ್ರವಲ್ಲದೆ, ಅನ್ನಭಾಗ್ಯ ಯೋಜನೆಯ ಫಲಾನುಭವಿಗಳ ಕುರಿತಂತೆಯೂ ಅರ್ಹತೆ ಪರಿಶೀಲನೆ ನಡೆಸುವ ಬಗ್ಗೆ ಸರ್ಕಾರದ ಮಟ್ಟದಲ್ಲಿ ಚರ್ಚೆ ನಡೆಯುತ್ತಿದೆ. ರಾಜ್ಯದ ಯೋಜನೆಗಳ ಪ್ರಯೋಜನ ನಿಜವಾದ ಅರ್ಹರಿಗೆ ತಲುಪುವಂತೆ ಮಾಡಲು ಫಲಾನುಭವಿಗಳ ಮಾಹಿತಿಯನ್ನು ಪರಿಶೀಲಿಸುವ ಪ್ರಕ್ರಿಯೆ ಮುಂದುವರಿಯಲಿದೆ.
ಬೇರೆ ರಾಜ್ಯದವರೂ ಕರ್ನಾಟಕದ ಗ್ಯಾರಂಟಿ ಯೋಜನೆಗಳ ಪ್ರಯೋಜನ ಪಡೆಯುತ್ತಿದ್ದಾರೆ ಎಂಬ ಚರ್ಚೆ ಹಿನ್ನೆಲೆಯಲ್ಲಿ ಫಲಾನುಭವಿಗಳ ದಾಖಲೆಗಳನ್ನು ಪರಿಶೀಲಿಸುವ ಅಗತ್ಯವಿದೆ ಎಂಬ ಅಭಿಪ್ರಾಯವೂ ವ್ಯಕ್ತವಾಗಿದೆ.
ಇದೇ ವೇಳೆ ಗ್ಯಾರಂಟಿ ಅನುಷ್ಠಾನ ಪ್ರಾಧಿಕಾರದ ರಾಜ್ಯ, ಜಿಲ್ಲೆ ಹಾಗೂ ತಾಲೂಕು ಮಟ್ಟದ ಸಮಿತಿ ಸದಸ್ಯರ ಸಮಾವೇಶವನ್ನು ಶೀಘ್ರದಲ್ಲೇ ನಡೆಸಲು ಸಭೆಯಲ್ಲಿ ನಿರ್ಧರಿಸಲಾಗಿದೆ. ಪ್ರಸ್ತುತ ಗ್ಯಾರಂಟಿ ಅನುಷ್ಠಾನ ಸಮಿತಿಯಲ್ಲಿ 4 ಸಾವಿರಕ್ಕೂ ಹೆಚ್ಚು ಸದಸ್ಯರಿದ್ದಾರೆ.
ಗ್ರಾಮ ಪಂಚಾಯಿತಿ ಮಟ್ಟದಲ್ಲೂ ಗ್ಯಾರಂಟಿ ಅನುಷ್ಠಾನ ಸಮಿತಿಗಳನ್ನು ರಚಿಸುವ ಕುರಿತು ಸರ್ಕಾರ ಚಿಂತನೆ ನಡೆಸಿದೆ. ಒಂದು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಆರು ಸದಸ್ಯರಂತೆ ನೇಮಕ ಮಾಡಿದರೆ, ರಾಜ್ಯಾದ್ಯಂತ ಸುಮಾರು 36 ಸಾವಿರ ಸದಸ್ಯರ ನೇಮಕಾತಿ ನಡೆಯುವ ಸಾಧ್ಯತೆ ಇದೆ.
ಇದನ್ನೂ ಓದಿ: ಗ್ಯಾರಂಟಿ ಪ್ರಾಧಿಕಾರದ ಸಭೆಯಲ್ಲಿ ಮಹತ್ವದ ತೀರ್ಮಾನ: ಮುಂಬರುವ ಚುನಾವಣೆಗೆ ಈಗ್ಲೇ ತಯಾರಿ ನಡೆಸ್ತಿದ್ಯಾ ಸರ್ಕಾರ?
ಈ ಬೆಳವಣಿಗೆಯ ಬೆನ್ನಲ್ಲೇ ಗ್ಯಾರಂಟಿ ಅನುಷ್ಠಾನ ವ್ಯವಸ್ಥೆಯನ್ನು ಮತ್ತಷ್ಟು ವಿಸ್ತರಿಸುವ ಮೂಲಕ ಸರ್ಕಾರ ರಾಜಕೀಯವಾಗಿಯೂ ಸಂಘಟನೆಯನ್ನು ಬಲಪಡಿಸಿಕೊಳ್ಳಲು ಮುಂದಾಗಿದೆಯೇ ಎಂಬ ಚರ್ಚೆ ಆರಂಭವಾಗಿದೆ.
ವರದಿ: ಈರಣ್ಣ ಬಸವಾ, ಟಿವಿ9, ಬೆಂಗಳೂರು
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ