ಗೃಹ ಸಚಿವರ ಬೆಂಗಾವಲು ವಾಹನ ಡಿಕ್ಕಿ ಕೇಸ್: ಕುಟುಂಬಸ್ಥರಿಗೆ ಮಾಹಿತಿ ನೀಡಿದೆ ಮೃತದೇಹ ರವಾನೆ, ಪೊಲೀಸರ ವಿರುದ್ಧ ಸಿಡಿದೆದ್ದ ಜನರು
ಗೃಹ ಸಚಿವರ ಬೆಂಗಾವಲು ವಾಹನ ಡಿಕ್ಕಿಯಾಗಿ ಬೈಕ್ ಸವಾರ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಕುಟುಂಬಸ್ಥರಿಗೆ ಮಾಹಿತಿ ನೀಡದೆ ಮೃತದೇಹವನ್ನು ಗ್ರಾಮಕ್ಕೆ ತೆಗೆದುಕೊಂಡು ಹೋಗಿರುವ ಪೊಲೀಸರ ನಡೆ ಖಂಡಿಸಿ ನೂರಾರು ಜನರು ಗಂಡಸಿ ಪೊಲೀಸ್ ಠಾಣೆ ಎದುರು ಧರಣಿ ಮಾಡಿದ್ದಾರೆ.
ಹಾಸನ: ಗೃಹ ಸಚಿವ ಆರಗ ಜ್ಞಾನೇಂದ್ರ (Araga Jnanendra) ಬೆಂಗಾವಲು ವಾಹನ ಡಿಕ್ಕಿಯಾಗಿ ಬೈಕ್ ಸವಾರ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಕುಟುಂಬಸ್ಥರಿಗೆ ಮಾಹಿತಿ ನೀಡದೆ ಮೃತದೇಹವನ್ನು ಗ್ರಾಮಕ್ಕೆ ತೆಗೆದುಕೊಂಡು ಹೋಗಿರುವ ಪೊಲೀಸರ ನಡೆ ಖಂಡಿಸಿ ನೂರಾರು ಜನರು ಗಂಡಸಿ ಪೊಲೀಸ್ ಠಾಣೆ ಎದುರು ಧರಣಿ ಮಾಡಿದ್ದಾರೆ. ಮೃತನ ಕುಟುಂಬಕ್ಕೆ ಸೂಕ್ತ ಪರಿಹಾರ ನೀಡುವಂತೆ ಒತ್ತಾಯಿಸಿ ಹೋರಾಟ ಮಾಡಲಾಗುತ್ತಿದ್ದು, ಮೃತದೇಹವನ್ನು ಪೊಲೀಸ್ ಠಾಣೆ ಎದುರು ತರುವಂತೆ ಪ್ರತಿಭಟನಾಕಾರರು ಪಟ್ಟು ಹಿಡಿದಿದ್ದಾರೆ.
ಘಟನೆ ಹಿನ್ನೆಲೆ
ನೆನ್ನೆ ರಾತ್ರಿ ಶಿವಮೊಗ್ಗಕ್ಕೆ ತೆರಳುವ ವೇಳೆ ಗೃಹ ಸಚಿವ ಆರಗ ಜ್ಞಾನೇಂದ್ರ ಬೆಂಗಾವಲು ವಾಹನ ಡಿಕ್ಕಿಯಾಗಿ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಅರಸೀಕೆರೆ ತಾಲ್ಲೂಕಿನ ಗಂಡಸಿ ಪೊಲೀಸ್ ಠಾಣೆ ಬಳಿ ನಡೆದಿದೆ. ಚಿಕ್ಕಗಂಡಸಿ ಗ್ರಾಮದ ನಿವಾಸಿ ರಮೇಶ್ (45) ಮೃತ ಬೈಕ್ ಸವಾರ ಎಂದು ಗುರುತಿಸಲಾಗಿದೆ. ಮಲೆಮಹದೇಶ್ವರ ಬೆಟ್ಟದಲ್ಲಿ ನಡೆದ ಬಿಜೆಪಿ ವಿಜಯ ಸಂಕಲ್ಪ ಯಾತ್ರೆಯಲ್ಲಿ ಭಾಗವಹಿಸಿ ಸಚಿವರು ಸ್ವಗ್ರಾಮಕ್ಕೆ ತೆರಳುತ್ತಿದ್ದಾಗ ಘಟನೆ ನಡೆದಿದೆ. ಈ ವೇಳೆ ಬಂಕ್‌ನಿಂದ ಬೈಕ್ ಸವಾರ ಬೆಂಗಾವಲು ವಾಹನಕ್ಕೆ ದಿಢೀರ್ ಅಡ್ಡ ಬಂದಿದ್ದಾರೆ ಎನ್ನಲಾಗಿದೆ. ಅವರಿಗೆ ಕೆಎ 13 ಜಿ 1467 ಸಂಖ್ಯೆಯ ಪೊಲೀಸ್ ವಾಹನ ಡಿಕ್ಕಿಯಾಗಿದೆ. ಬೈಕ್ ಸವಾರ ರಮೇಶ್ ಹೆಲ್ಮೆಟ್ ಧರಿಸಿರಲಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ. ರಮೇಶ್ ಮೃತದೇಹವನ್ನು ಜಿಲ್ಲಾ ಆಸ್ಪತ್ರೆ ಶವಾಗಾರಕ್ಕೆ ಸ್ಥಳಾಂತರಿಸಲಾಗಿದೆ.
ಇದನ್ನೂ ಓದಿ: Hassan: ಗೃಹ ಸಚಿವ ಆರಗ ಜ್ಞಾನೇಂದ್ರ ಬೆಂಗಾವಲು ವಾಹನ ಡಿಕ್ಕಿ: ಬೈಕ್ ಸವಾರ ಸ್ಥಳದಲ್ಲೇ ಸಾವು
ಇನ್ನು ಅಪಘಾತದ ಬಳಿಕ ಘಟನೆ ಬಗ್ಗೆ ಮಾಹಿತಿ ಇಲ್ಲದೆ ಸಚಿವರು ತೆರಳಿದ್ದಾರೆ ಎನ್ನಲಾಗುತ್ತಿದೆ. ವಿಚಾರ ತಿಳಿಯುತ್ತಿದಂತೆ ಪೊಲೀಸರಿಗೆ ಕರೆಮಾಡಿ ಮಾಹಿತಿ ಪಡೆದು ಸೂಕ್ತ ಕ್ರಮಕ್ಕೆ ಸೂಚನೆ ನೀಡಿದ್ದಾರೆ. ನೆನ್ನೆ ಅಪಘಾತದ ಬಳಿಕ ಇಂದು ಮರಣೋತ್ತರ ಪರೀಕ್ಷೆ ನಡೆಸಿ ಮೃತದೇಹವನ್ನು ಕುಟುಂಬಸ್ಥರಿಗೆ ಹಸ್ತಾಂತರಿಸದೆ ಪೊಲೀಸರು ಗ್ರಾಮಕ್ಕೆ ತೆಗೆದುಕೊಂಡು ಹೋಗಿದ್ದಾರೆ. ಪ್ರತಿಭಟನಾ ನಿರತರು ಮತ್ತು ಪೊಲೀಸರ ನಡುವೆ ವಾಗ್ವಾದ ನಡೆದಿದೆ. ಎಸ್ಪಿ ಹರಿರಾಮ್ ಶಂಕರ್ ಮತ್ತು ಶಾಸಕ ಶಿವಲಿಂಗೇಗೌಡ ಭೇಟಿ ನೀಡಿದ್ದು, ಹೊರಾಟನಿರತರನ್ನು ಮನವೊಲಿಸಲು ಪ್ರಯತ್ನಿಸಿದರು.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.