ಪಾದಯಾತ್ರೆ ಮೂಲಕ ಧರ್ಮಸ್ಥಳಕ್ಕೆ ಹೋಗುತ್ತಿದ್ದವರ ಮೇಲೆ ಹರಿದ ಬಸ್: ಇಬ್ಬರ ಸಾವು
ಹಾಸನ ತಾಲೂಕಿನ ಕೆಂಚಟ್ಟಹಳ್ಳಿ ಬಳಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಧರ್ಮಸ್ಥಳಕ್ಕೆ ಪಾದಯಾತ್ರೆ ನಡೆಸುತ್ತಿದ್ದ ಮೂವರ ಮೇಲೆ ಖಾಸಗಿ ಬಸ್ ಡಿಕ್ಕಿ ಹೊಡೆದಿದೆ. ಈ ಘಟನೆಯಲ್ಲಿ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಮತ್ತು ಒಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಮೃತರನ್ನು ಸುರೇಶ್ ಮತ್ತು ಕುಮಾರ್ ಎಂದು ಗುರುತಿಸಲಾಗಿದೆ. ಶಾಂತಿಗ್ರಾಮ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಹಾಸನ, ಫೆಬ್ರವರಿ 23: ಪಾದಯಾತ್ರೆ ಮೂಲಕ ಧರ್ಮಸ್ಥಳಕ್ಕೆ (Dharmasthala) ಹೋಗುತ್ತಿದ್ದವರ ಮೇಲೆ ಖಾಸಗಿ ಬಸ್ ಹರಿದ ಪರಿಣಾಮ ಇಬ್ಬರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಹಾಸನ (Hassan) ತಾಲೂಕಿನ ಕೆಂಚಟ್ಟಹಳ್ಳಿ ಬಳಿ ನಡೆದಿದೆ. ಮಂಡ್ಯ ಜಿಲ್ಲೆಯ ಕೆ.ಆರ್.ಪೇಟೆ ತಾಲೂಕಿನ ಆನಗೋಳು ಗ್ರಾಮದ ಸುರೇಶ್ (60), ಕುಮಾರ್ (55) ಮೃತ ದುರ್ದೈವಿಗಳು. ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡ ದಿನೇಶ್ ಎಂಬುವರನ್ನು ಹಾಸನ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಮೂವರು ಪಾದಯಾತ್ರೆ ಮೂಲಕ ಧರ್ಮಸ್ಥಳಕ್ಕೆ ಹೋಗುತ್ತಿದ್ದರು. ದಾರಿ ಮಧ್ಯೆ ಖಾಸಗಿ ಬಸ್ ಪಾದಾಯಾತ್ರಿಗಳ ಮೇಲೆ ಹರಿದಿದೆ. ಶಾಂತಿಗ್ರಾಮ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.
ಕಾರು ಡಿಕ್ಕಿಯಾಗಿ ತಂದೆ-ಮಗಳು ಸಾವು
ಬೆಳಗಾವಿ: ಅಥಣಿ ತಾಲೂಕಿನ ಅನಂತಪುರ ಬಳಿ ಹಿಂಬದಿಯಿಂದ ಕಾರು ಡಿಕ್ಕಿಯಾಗಿ ಬೈಕ್ನಲ್ಲಿದ್ದ ತಂದೆ ಮತ್ತು ಮಗಳು ಮೃತಪಟ್ಟಿದ್ದಾರೆ. ಮಹಾರಾಷ್ಟ್ರದ ಜತ್ತ ತಾಲೂಕಿನ ಮೆಂಡಿಗೇರಿ ಗ್ರಾಮದ ನಿವಾಸಿಗಳಾದ ರಾಮು ಕುರ್ಣಿ (49), ಜಾಹ್ನವಿ ಕುರ್ಣಿ (11) ಮೃತ ದುರ್ದೈವಿಗಳು. ರಾಮು ಪತ್ನಿಗೆ ಗಂಭೀರ ಗಾಯವಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಬೈಕ್ನಲ್ಲಿ ಮೂವರು ಅನಂತಪುರ ಗ್ರಾಮದ ಸೋದರ ಸಂಬಂಧಿ ಮದುವೆಗೆ ಬಂದಿದ್ದರು ಎಂದು ತಿಳಿದುಬಂದಿದೆ. ಬೈಕ್ಗೆ ಹಿಂಬದಿಯಿಂದ ಡಿಕ್ಕಿ ಹೊಡೆದು ಕಾರು ಚಾಲಕ ಪರಾರಿಯಾಗಿದ್ದಾನೆ. ಅಥಣಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪಾದಚಾರಿಗಳ ಮೇಲೆ ಹರಿದ ಕಾರು, ಓರ್ವ ಸಾವು
ಮಂಗಳೂರು: ಮಂಗಳೂರು ಹೊರವಲಯದ ಕುಳಾಯಿ ಬಳಿಯ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಪಾದಚಾರಿಗಳ ಮೇಲೆ ಕಾರು ಹರಿದಿದ್ದು, ಓರ್ವ ಮೃತಪಟ್ಟಿದ್ದಾರೆ. ರಾಯಚೂರು ಜಿಲ್ಲೆಯ ಸಿಂಧನೂರಿನ ದೀಪುಗೌಡ (50) ಮೃತದುರ್ದೈವಿ. ಘಟನೆಯಲ್ಲಿ ಕೊಪ್ಪಳ ಜಿಲ್ಲೆಯ ಕಾರಟಗಿ ಮೂಲದ ಪ್ರದೀಪ್ ಕೊಲ್ಕಾರ್ ಮತ್ತು ಮಂಗಳೂರಿನ ಕೋಡಿಕೆರೆ ನಿವಾಸಿ ನಾಗರಾಜ್ಗೆ ಗಂಭೀರ ಗಾಯವಾಗಿದ್ದು, ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ. ಅಪಘಾತದ ಭೀಕರ ದೃಶ್ಯ ಸಿಸಿಕ್ಯಾಮರಾದಲ್ಲಿ ಸೆರೆಯಾಗಿದೆ. ಮಂಗಳೂರು ಉತ್ತರ ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ: ಶಿರಾಡಿಯಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ, ಆರೋಪ
ಖಾಸಗಿ ಬಸ್ ಪಲ್ಟಿ
ತುಮಕೂರು: ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಬಸ್ ಪಲ್ಟಿಯಾಗಿ ಐವರು ಪ್ರಯಾಣಿಕರು ಗಾಯಗೊಂಡಿದ್ದಾರೆ. ಕುಣಿಗಲ್ ತಾಲ್ಲೂಕಿನ ಹೇರೂರು ಬಳಿ ಹಾದುಹೋಗಿರುವ ರಾಷ್ಟ್ರೀಯ ಹೆದ್ದಾರಿ 75 ರಲ್ಲಿ ಘಟನೆ ನಡೆದಿದೆ. ಖಾಸಗಿ ಬಸ್ ಕುಕ್ಕೆ ಸುಬ್ರಮಣ್ಯದಿಂದ ಬೆಂಗಳೂರು ಕಡೆಗೆ ತೆರಳುತ್ತಿತ್ತು. ಬಸ್ನಲ್ಲಿ ಒಟ್ಟು 24 ಜನ ಪ್ರಯಾಣಿಕರಿದ್ದರು. ಬಸ್ ಪಲ್ಟಿಯಿಂದಾಗಿ 5 ಜನ ಪ್ರಯಾಣಿಕರಿಗೆ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಕುಣಿಗಲ್ ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ಕುಣಿಗಲ್ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಘಟನೆ ಸಂಬಂಧ ಕುಣಿಗಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 11:08 am, Sun, 23 February 25