ಜ.16 ರಂದು ಬೆಂಗಳೂರಿಗೆ ಪ್ರಿಯಾಂಕಾ ಗಾಂಧಿ, ಮಹಿಳೆಯರಿಗಾಗಿ ವಿಶೇಷ ಪ್ರಣಾಳಿಕೆ ಬಿಡುಗಡೆ: ಧ್ರುವನಾರಾಯಣ್
ಜ.16 ರಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಬೆಂಗಳೂರಿಗೆ ಆಗಮಿಸಲಿದ್ದಾರೆ ಎಂದು ಹಾಸನದಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ ಧ್ರುವನಾರಾಯಣ್ ಹೇಳಿದರು.
ಹಾಸನ: ರಾಜ್ಯ ಕಾಂಗ್ರೆಸ್ ನಾಯಕರು ಬರುವ ವಿಧಾನಸಭೆ ಚುನಾವಣೆ ದೃಷ್ಟಿಯಿಂದ ಈಗಾಗಲೇ ಬಸ್ ಯಾತ್ರೆ ಪ್ರಾರಂಭಿಸಿದ್ದು, ಹಾಗೇ ಸರಣಿ ಸಮಾವೇಶ ಮಾಡಲು ಮುಂದಾಗಿದ್ದಾರೆ. ಈ ಹಿನ್ನೆಲೆ ಕೇಂದ್ರ ಕಾಂಗ್ರೆಸ್ ನಾಯಕರು ರಾಜ್ಯ ಪ್ರವಾಸ ಕೈಗೊಳ್ಳುತ್ತಿದ್ದು, ಇದರಂತೆ ಜ.16 ರಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಅವರು (Priyanka Gandhi) ಬೆಂಗಳೂರಿಗೆ ಆಗಮಿಸಲಿದ್ದಾರೆ ಎಂದು ಹಾಸನದಲ್ಲಿ ಕೆಪಿಸಿಸಿ (KPCC) ಕಾರ್ಯಾಧ್ಯಕ್ಷ ಧ್ರುವನಾರಾಯಣ್ (Dhruvanarayan) ಹೇಳಿದ್ದಾರೆ. ಜೊತೆಗೆ ಕಾರ್ಯಕ್ರಮದಲ್ಲಿ ಮಹಿಳೆಯರಿಗಾಗಿ ವಿಶೇಷವಾದ ಪ್ರಣಾಳಿಕೆ ಬಿಡುಗಡೆ ಮಾಡಲಿದ್ದಾರೆ ಎಂದು ಹೇಳಿದರು.
ಈ ಕುರಿತು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು ಈ ಕಾರ್ಯಕ್ರಮಕ್ಕೆ ಹಾಸನ ಜಿಲ್ಲೆಯ 7 ವಿಧಾನಸಭಾ ಕ್ಷೇತ್ರಗಳಿಂದ 5000 ಮಹಿಳಾ ಪ್ರತಿನಿಧಿಗಳು ಭಾಗವಹಿಸಲಿದ್ದಾರೆ. ಇಡಿ ರಾಜ್ಯದಿಂದ 50 ಸಾವಿರ ಮಹಿಳಾ ಪ್ರತಿನಿಧಿಗಳು ಸಭೆಗೆ ಬರಲಿದ್ದಾರೆ. ಇಂದಿನಿಂದ ವಿಪಕ್ಷ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ನೇತೃತ್ವದಲ್ಲಿ ಬೆಳಗಾವಿಯಿಂದ ಪ್ರಜಾಧ್ವನಿ ಬಸ್ ಯಾತ್ರೆ ಆರಂಭಗೊಂಡಿದೆ ಎಂದರು.
ಇದನ್ನೂ ಓದಿ: ಕಾಂಗ್ರೆಸ್ ಅಧಿಕಾರಕ್ಕೆ ಬಂದ್ರೆ ಉಚಿತ ವಿದ್ಯುತ್, ಮಹಿಳೆಯರಿಗೆ ಪ್ರತ್ಯೇಕ ಪ್ರಣಾಳಿಕೆ: ಡಿಕೆ ಶಿವಕುಮಾರ್ ಘೋಷಣೆ
ಹಾಸನದಲ್ಲಿ ಜನವರಿ 21 ರಂದು ಪ್ರಜಾಧ್ವನಿ ಸಮಾವೇಶ
ಇನ್ನೂ ಹಾಸನದಲ್ಲಿ ಜನವರಿ 21 ರಂದು ಬೆಳಿಗ್ಗೆ 10 ಗಂಟೆಗೆ ಪ್ರಜಾಧ್ವನಿ ಸಮಾವೇಶ ಆಯೋಜಿಸಲಾಗಿದೆ. ಈ ಸಮಾವೇಶಕ್ಕೆ 1 ಲಕ್ಷ ಜನ ಸೇರುವ ನಿರೀಕ್ಷೆಯಿದೆ. ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಬಿ.ಕೆ.ಹರಿಪ್ರಸಾದ್ ಸೇರಿದಂತೆ ಅನೇಕ ನಾಯಕರು ಭಾಗವಹಿಸಲಿದ್ದಾರೆ. ಪ್ರಜಾದ್ವನಿ ಯಾತ್ರೆ ಬಳಿಕ ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್ ನೇತೃತ್ವದಲ್ಲಿ ಎರಡು ತಂಡಗಳಲ್ಲಿ 224 ಕ್ಷೇತ್ರಗಳಲ್ಲಿ ಪ್ರವಾಸ ಕೈಗೊಳ್ಳಲಿದ್ದಾರೆ ಎಂದು ಮಾಹಿತಿ ನೀಡಿದರು.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.
Published On - 3:37 pm, Wed, 11 January 23