
ಹಾಸನ , ನ.29: ಮನೆಯ ಗೃಹಪ್ರವೇಶದ ಆಹ್ವಾನ ಪತ್ರಿಕೆಯನ್ನು ಸಂಬಂಧಿಕರಿಗೆ ನೀಡಿ ಖುಷಿಯಿಂದ ಮನೆಗೆ ಹಿಂದಿರುಗುತ್ತಿದ್ದ ತಂದೆ ಮತ್ತು ಮಗಳ ಬೈಕ್‌ಗೆ ಅತಿ ವೇಗವಾಗಿ ಬಂದ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ ತಂದೆ ಸ್ಥಳದಲ್ಲೇ ಮೃತಪಟ್ಟು, ಮಗಳು ಗಂಭೀರವಾಗಿ ಗಾಯಗೊಂಡಿರುವ ದಾರುಣ ಘಟನೆ ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ತಾಲೂಕಿನ ಜೋಗಿಪುರ ಗೇಟ್ ಬಳಿ ನಡೆದಿದೆ. ಮೃತರನ್ನು ಚನ್ನರಾಯಪಟ್ಟಣ ತಾಲೂಕಿನ ಬೇಡಿಗನಹಳ್ಳಿ ಗ್ರಾಮದ ನಿವಾಸಿ ಪ್ರಕಾಶ್ (58) ಎಂದು ಗುರುತಿಸಲಾಗಿದೆ. ಗಂಭೀರವಾಗಿ ಗಾಯಗೊಂಡಿರುವ ಅವರ ಪುತ್ರಿ ಶ್ರುತಿ ಅವರನ್ನು ತಕ್ಷಣವೇ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಪ್ರಕಾಶ್ ಅವರು ತಮ್ಮ ಪುತ್ರಿ ಶ್ರುತಿ ಜೊತೆಗೂಡಿ ಮನೆಯ ಗೃಹಪ್ರವೇಶ ಕಾರ್ಯಕ್ರಮದ ಆಹ್ವಾನ ಪತ್ರಿಕೆಗಳನ್ನು ನೀಡಿ ಬೈಕ್‌ನಲ್ಲಿ ಸ್ವಗ್ರಾಮ ಬೇಡಿಗನಹಳ್ಳಿಯತ್ತ ಹಿಂದಿರುಗುತ್ತಿದ್ದರು. ರಾಷ್ಟ್ರೀಯ ಹೆದ್ದಾರಿ 75ರ (NH-75) ಜೋಗಿಪುರ ಗೇಟ್ ಬಸ್ ನಿಲ್ದಾಣದ ಎದುರು ಬೈಕ್ ಸಾಗುತ್ತಿದ್ದಾಗ, ಅತಿ ವೇಗವಾಗಿ ಬಂದ KA-13-Z-0995 ನೋಂದಣಿ ಸಂಖ್ಯೆಯ ಕಿಯಾ (Kia) ಕಾರು ಬೈಕ್‌ಗೆ ಹಿಂಬದಿಯಿಂದ ರಭಸವಾಗಿ ಡಿಕ್ಕಿ ಹೊಡೆದಿದೆ.
ಡಿಕ್ಕಿಯ ತೀವ್ರತೆಗೆ ಬೈಕ್‌ನಿಂದ ರಸ್ತೆಗೆ ಎಸೆಯಲ್ಪಟ್ಟ ಪ್ರಕಾಶ್ ಅವರು ತೀವ್ರ ರಕ್ತಸ್ರಾವವಾಗಿ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ. ಗಂಭೀರವಾಗಿ ಗಾಯಗೊಂಡಿರುವ ಪುತ್ರಿ ಶ್ರುತಿ ಸಾವು-ಬದುಕಿನ ನಡುವೆ ಹೋರಾಡುತ್ತಿದ್ದು, ಆಸ್ಪತ್ರೆಯಲ್ಲಿ ತುರ್ತು ಚಿಕಿತ್ಸೆ ಪಡೆಯುತ್ತಿದ್ದಾರೆ.
ಇದನ್ನೂ ಓದಿ: ಬಳ್ಳಾರಿ ಸೆಂಟ್ರಲ್ ಜೈಲಿನಿಂದ ಜೀವಾವಧಿ ಕೈದಿ ಪರಾರಿ: ಸಿಸಿಕ್ಯಾಮರಾದಲ್ಲಿ ದೃಶ್ಯ ಸೆರೆ
ಘಟನಾ ಸ್ಥಳಕ್ಕೆ ಚನ್ನರಾಯಪಟ್ಟಣ ನಗರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ. ಅಪಘಾತಕ್ಕೆ ಕಾರಣವಾದ ಕಿಯಾ ಕಾರು ಚಾಲಕನ ವಿರುದ್ಧ ಚನ್ನರಾಯಪಟ್ಟಣ ಟೌನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ. ಗೃಹಪ್ರವೇಶದ ಸಂಭ್ರಮದಲ್ಲಿದ್ದ ಕುಟುಂಬದಲ್ಲಿ ಈ ದುರ್ಘಟನೆಯಿಂದಾಗಿ ಆಕ್ರಂದನ ಮುಗಿಲು ಮುಟ್ಟಿದೆ.
ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ