
ಹಾಸನ, ಸೆಪ್ಟೆಂಬರ್ 5: ಹಾಸನ ಜಿಲ್ಲೆಯ ಶಾಂತಿಗ್ರಾಮದಲ್ಲಿರುವ ಸಮಾಜ ಕಲ್ಯಾಣ ಇಲಾಖೆ ವ್ಯಾಪ್ತಿಯ ಡಾ. ಬಿ.ಆರ್. ಅಂಬೇಡ್ಕರ್ ವಸತಿ ಶಾಲೆಯ 172 ಮಕ್ಕಳು ಕಳೆದ ಐದು ವರ್ಷಗಳಿಂದ ದನದ ಶೆಡ್‌ನಂತಿರುವ ಕಟ್ಟಡದಲ್ಲಿ ವಾಸಿಸುತ್ತಿರುವ ಆರೋಪ ಕೇಳಿಬಂದಿದೆ. ಆರರಿಂದ 10ನೇ ತರಗತಿವರೆಗೆ ವ್ಯಾಸಂಗ ಮಾಡುತ್ತಿರುವ ಮಕ್ಕಳ ಪೈಕಿ 92 ಬಾಲಕರು ಹಾಗೂ 80 ಬಾಲಕಿಯರಿದ್ದಾರೆ. ಒಂದೇ ಸ್ಥಳದಲ್ಲಿ ಊಟ, ನಿದ್ರೆ ಹಾಗೂ ಪಾಠ ಕೇಳುವ ಪರಿಸ್ಥಿತಿ ಇದ್ದು, ಕೆಲ ವಿದ್ಯಾರ್ಥಿಗಳು ನೆಲದ ಮೇಲೆಯೇ ಕುಳಿತು ಪಾಠ ಕೇಳಬೇಕಾಗಿದೆ.
92 ಬಾಲಕರಿಗೆ ಕೇವಲ ಐದು ಶೌಚಾಲಯಗಳಿದ್ದು, ಬಾಲಕಿಯರಿಗೂ ಅಗತ್ಯ ಮೂಲಸೌಕರ್ಯಗಳ ಕೊರತೆ ಇದೆ. ಗಾಳಿ ಮತ್ತು ಬೆಳಕಿನ ಕೊರತೆಯಿರುವ ಕಟ್ಟಡದಲ್ಲೇ ಮಕ್ಕಳು ವಾಸಿಸುತ್ತಿದ್ದಾರೆ ಎನ್ನಲಾಗಿದೆ. ಮಕ್ಕಳ ವಾಸ್ತವ್ಯಕ್ಕಾಗಿ ತಿಂಗಳಿಗೆ 1.08 ಲಕ್ಷ ರೂ. ಬಾಡಿಗೆ ಪಾವತಿಸಲಾಗುತ್ತಿದೆ ಎಂದು ತಿಳಿದುಬಂದಿದೆ. ಹೊಸ ಕಟ್ಟಡ ನಿರ್ಮಾಣವಾಗುತ್ತಿದ್ದು, ಪರ್ಯಾಯ ಜಾಗ ಸಿಗದ ಹಿನ್ನೆಲೆಯಲ್ಲಿ ಈ ವ್ಯವಸ್ಥೆ ಮುಂದುವರಿದಿದೆ ಎಂದು ಶಾಲೆಯ ಪ್ರಾಂಶುಪಾಲರು ಹಾಗೂ ಸಿಬ್ಬಂದಿ ತಿಳಿಸಿದ್ದಾರೆ.
ಮಕ್ಕಳಿಗೆ ಅಗತ್ಯ ಸೌಲಭ್ಯ ಕಲ್ಪಿಸದೆ ಇಂತಹ ಪರಿಸ್ಥಿತಿಯಲ್ಲಿ ವಾಸ್ತವ್ಯಕ್ಕೆ ಅವಕಾಶ ನೀಡಿರುವುದಕ್ಕೆ ಸಮಾಜ ಕಲ್ಯಾಣ ಇಲಾಖೆ ವಿರುದ್ಧ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕೂಡಲೇ ಮಕ್ಕಳನ್ನು ಸುರಕ್ಷಿತ ಹಾಗೂ ಸೂಕ್ತ ಸೌಲಭ್ಯವಿರುವ ಸ್ಥಳಕ್ಕೆ ಸ್ಥಳಾಂತರಿಸುವಂತೆ ಒತ್ತಾಯಿಸಿದ್ದಾರೆ.
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ