
ಹಾಸನ, ಜೂನ್ 30: ಹಾಸನ ಜಿಲ್ಲೆಯಲ್ಲಿ ಹೃದಯಾಘಾತ (Heart Attack) ಸರಣಿ ಮುಂದುವರಿದಿದ್ದು, ಒಂದೇ ದಿನ ಮೂವರು ಮೃತಪಟ್ಟಿದ್ದಾರೆ. ಇದರೊಂದಿಗೆ, ಕಳೆದ 40 ದಿನಗಳಲ್ಲಿ ಹೃದಯಾಘಾತದಿಂದ ಮೃತಪಟ್ಟವರ ಸಂಖ್ಯೆ 21ಕ್ಕೆ ಏರಿಕೆಯಾಗಿದೆ. ಹಾಸನ (Hassan) ಜಿಲ್ಲೆಯ ಬೇಲೂರಿನ ಜೆಪಿ. ಲೇಪಾಕ್ಷಿ (50), ಹೊಳೆನರಸೀಪುರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಇಂಗ್ಲಿಷ್ ಪ್ರಾಧ್ಯಾಪಕ ಮುತ್ತಯ್ಯ (58), ನುಗ್ಗೆಹಳ್ಳಿ ನಾಡಕಚೇರಿ ಡಿ ಗ್ರೂಪ್ ನೌಕರ ಕುಮಾರ್ (53) ಕೂಡ ಹೃದಯಾಘಾತದಿಂದ ಸಾವಿಗೀಡಾಗಿದ್ದಾರೆ.
ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ತಾಲೂಕಿನ ನುಗ್ಗೆಹಳ್ಳಿ ಗ್ರಾಮದ ನಾಡಕಚೇರಿ ಡಿ ಗ್ರೂಪ್ ನೌಕರ ಕುಮಾರ್ಗೆ ಭಾನುವಾರ ರಾತ್ರಿ ಮನೆಯಲ್ಲಿ ಮಲಗಿದ್ದ ವೇಳೆ ಎದೆನೋವು ಕಾಣಿಸಿಕೊಂಡಿದೆ. ತಕ್ಷಣವೇ ಅವರನ್ನು ಚನ್ನರಾಯಪಟ್ಟಣ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಅವರು ಮೃತಪಟ್ಟಿದ್ದಾರೆ. ಇವರು ಚನ್ನರಾಯಪಟ್ಟಣ ತಾಲೂಕಿನ ನಲ್ಲೂರು ಗ್ರಾಮದ ನಿವಾಸಿಯಾಗಿದ್ದಾರೆ.
ಹಾಸನ ಜಿಲ್ಲೆಯಲ್ಲಿ ಹೃದಯಾಘಾತ ಹೆಚ್ಚಾದ ವಿಚಾರವಾಗಿ ಮೈಸೂರಿನಲ್ಲ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದು, ಆ ಬಗ್ಗೆ ಪರಿಶೀಲನೆ ನಡೆಸುತ್ತೇನೆ. ಹೃದಯಘಾತ ಹೆಚ್ಚಾಗಲು ಕಾರಣ ಏನು ಎಂಬುದಕ್ಕೆ ತಜ್ಞರ ಮೂಲಕ ಮಾಹಿತಿ ತರಿಸಿಕೊಳ್ಳುತ್ತೇನೆ. ನಿಯಂತ್ರಣಕ್ಕೆ ಸೂಕ್ತ ಕ್ರಮ ಕೈಗೊಳ್ಳುತ್ತೇನೆ ಎಂದು ಭರವಸೆ ನೀಡಿದ್ದಾರೆ.
ಎರಡು ದಿನಗಳ ಹಿಂದಷ್ಟೇ ಹಾಸನದ ಸಿದ್ದೇಶ್ವರ್ ನಗರದ ನಿವಾಸಿ ಗೋವಿಂದ (37) ಎಂಬವರು ಹೃದಯಾಘಾತದಿಂದ ಮೃತಪಟ್ಟಿದ್ದರು. ಆಟೋ ಚಾಲಕರಾಗಿರುವ ಗೋವಿಂದ ಅವರಿಗೆ ಆಟೋ ಚಲಾಯಿಸುವಾಗ ಎದೆನೋವು ಕಾಣಿಸಿಕೊಂಡಿತ್ತು. ಕೂಡಲೇ ಅವರೇ ಆಟೋ ಚಲಾಯಿಸಿಕೊಂಡು ಜಿಲ್ಲಾಸ್ಪತ್ರೆಗೆ ತೆರಳಿದ್ದರು. ಆದಾಗ್ಯೂ, ಆಸ್ಪತ್ರೆಯಲ್ಲಿ ಹೃದಯಾಘಾತದಿಂದ ಮೃತಪಟ್ಟಿದ್ದರು.
ಏತನ್ಮಧ್ಯೆ, ಹಾಸನ ಜಿಲ್ಲೆಯಲ್ಲಿ ಮತ್ತು ಕರ್ನಾಟಕದ ಇತರ ಕಡೆಗಳಲ್ಲಿ ಯುವಕ ಯುವತಿಯರಲ್ಲೇ ಹೃದಯಾಘಾತ ಪ್ರಕರಣಗಳು ಹೆಚ್ಚುತ್ತಿರುವ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಜತೆ ಚರ್ಚಿಸಲು ಬೆಂಗಳೂರು ಗ್ರಾಮಾಂತರ ಸಂಸದ ಡಾ. ಸಿಎನ್ ಮಂಜುನಾಥ್ ಮುಂದಾಗಿದ್ದಾರೆ. ಹೃದಯಘಾತ ನಿಯಂತ್ರಣಕ್ಕೆ ಸಂಬಂಧಿಸಿ ಸಿಎನ್ ಮಂಜುನಾಥ್ ಈಗಾಗಲೇ ಕೇಂದ್ರ ಆರೋಗ್ಯ ಸಚಿವ ಜೆಪಿ ನಡ್ಡಾ ಮತ್ತು ಕರ್ನಾಟಕ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರ ಜೊತೆಯೂ ಚರ್ಚೆ ಮಾಡಿದ್ದಾರೆ.
ಇದನ್ನೂ ಓದಿ: ಎದೆಯುರಿ ಇದ್ದರೆ ಅಸಿಡಿಟಿ ಎನ್ನಬೇಡಿ, ನೀವೇ ಡಾಕ್ಟರ್ ಅಗ್ಬೇಡಿ: ಹೃದಯದ ಆರೋಗ್ಯಕ್ಕೆ ಇಲ್ಲಿದೆ ಟಿಪ್ಸ್
ಮತ್ತೊಂದೆಡೆ, ಎದೆ ನೋವಿನಿಂದ ಬಳಲಿ ಬರುವವರಿಗೆ ಜಯದೇವ ಆಸ್ಪತ್ರೆ ಸಹಯೋಗದೊಂದಿಗೆ ಚಿಕಿತ್ಸೆ ನೀಡುವುದಕ್ಕಾಗಿ ಹಾಸನ ಜಿಲ್ಲೆಯ ಬೇಲೂರು, ಸಕಲೇಶಪುರ, ಆಲೂರು, ಅರಕಲಗೂಡು ಹಾಗು ಚನ್ನರಾಯಪಟ್ಟಣ ತಾಲ್ಲೂಕು ಆಸ್ಪತ್ರೆಗಳಲ್ಲಿ ಸ್ಟೆಮಿ ಯೋಜನೆ ಜಾರಿ ಮಾಡುವಂತೆ ಜಿಲ್ಲಾ ಅರೋಗ್ಯ ಅಧಿಕಾರಿ ಡಾ. ಅನಿಲ್ ಕುಮಾರ್ ಅವರು ಆರೋಗ್ಯ ಇಲಾಖೆಗೆ ಈಗಾಗಲೇ ಮನವಿ ಮಾಡಿದ್ದಾರೆ.
Published On - 11:31 am, Mon, 30 June 25