ಹಾಸನ: ಶಿರಾಡಿ ಘಾಟ್​​​ನಲ್ಲಿ ಭಾರೀ ಭೂಕುಸಿತ, ಮಣ್ಣಿನಡಿ‌ ಸಿಲುಕಿದ ಹಲವು ವಾಹನಗಳು

| Updated By: ಗಣಪತಿ ಶರ್ಮ

Updated on: Jul 30, 2024 | 2:40 PM

ಕಳೆದ ವಾರವಷ್ಟೇ ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ಶಿರಾಡಿ ಘಾಟಿಯ ದೊಡ್ಡತಪ್ಲೆ ಬಳಿ ಭೂಕುಸಿತ ಸಂಭವಿಸಿ ರಾಷ್ಟ್ರೀಯ ಹೆದ್ದಾರಿ 75 ರಲ್ಲಿ ಸಂಚಾರ ಸ್ಥಗಿತಗೊಂಡಿತ್ತು. ಇದೀಗ ಮತ್ತೆ ಅದೇ ಜಾಗದಲ್ಲಿ ಭೂಕುಸಿತ ಸಂಭವಿಸಿದೆ. ಹಲವು ವಾಹನಗಳು ಮಣ್ಣಿನಡಿ ಸಿಲುಕಿವೆ.

ಹಾಸನ, ಜುಲೈ 30: ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ಶಿರಾಡಿ ಘಾಟಿಯ ದೊಡ್ಡತಪ್ಲೆ ಬಳಿ ರಾಷ್ಟ್ರೀಯ ಹೆದ್ದಾರಿ 75 ರಲ್ಲಿ ಮತ್ತೆ ಭಾರೀ ಭೂಕುಸಿತ ಸಂಭವಿಸಿದ್ದು, ಹಲವು ವಾಹನಗಳು ಮಣ್ಣಿನಡಿ ಸಿಲುಕಿವೆ.  ಎರಡು ಕಾರು, ಒಂದು ಟ್ಯಾಂಕರ್ ಸೇರಿ ಆರು ವಾಹನಗಳು ಮಣ್ಣನಡಿ ಸಿಲುಕಿವೆ ಎನ್ನಲಾಗಿದೆ. ಸತತ ಮಳೆಯಿಂದ ದೊಡ್ಡತಪ್ಲೆ ಬಳಿ ಭಾರೀ ಪ್ರಮಾಣದ ಭೂ ಕುಸಿತ ಸಂಭವಿಸಿದೆ.

ಈ ಪ್ರದೇಶದಲ್ಲಿ ಕಳೆದ ಹದಿನೈದು ದಿನಗಳಿಂದ ಮಣ್ಣು ಕುಸಿಯುತ್ತಿದೆ. ಇಂದು ಮತ್ತೆ ಭಾರಿ ಪ್ರಮಾಣದಲ್ಲಿ ಮಣ್ಣು ಕುಸಿದಿದೆ. ಇದೇ ವೇಳೆ ಕಾರಿನಲ್ಲಿ ಸಂಚರಿಸುತ್ತಿದ್ದವರು ಅದರಡಿ ಸಿಲುಕಿದ್ದಾರೆ. ಸದ್ಯ ರಕ್ಷಣಾ ಕಾರ್ಯಾಚರಣೆ ಪ್ರಗತಿಯಲ್ಲಿದೆ. ರಕ್ಷಣಾ ಸಿಬ್ಬಂದಿ ಜೆಸಿಬಿ ಮೂಲಕ‌ ಮಣ್ಣು ತೆರವು ಮಾಡುತ್ತಿದ್ದಾರೆ. ಸ್ಥಳದಲ್ಲಿ ಆತಂಕ ಹೆಚ್ಚಾಗಿದೆ. ಮತ್ತಷ್ಟು ಮಣ್ಣು ಕುಸಿದರೆ ದೊಡ್ಡ ಅನಾಹುತವೇ ಸಂಭವಿಸುವ ಭೀತಿ ಎದುರಾಗಿದೆ. ಸಮರೋಪಾದಿಯಲ್ಲಿ ಮಣ್ಣು ತೆರವು ಮಾಡಲು ಪ್ರಯತ್ನಿಸಲಾಗುತ್ತಿದೆ.

ವಾಹನ ಸಂಚಾರ ಸಂಪೂರ್ಣ ಬಂದ್

ಸದ್ಯ ಶಿರಾಡಿ ಘಾಟ್ ರಸ್ತೆಯಲ್ಲಿ ಸಂಚಾರ ಸಂಪೂರ್ಣ ಸ್ಥಗಿತಗೊಂಡಿದೆ. ದಕ್ಷಿಣ ಕನ್ನಡ ಜಿಲ್ಲೆಯ ವಿವಿಧ ಪ್ರದೇಶಗಳಿಂದ ಬರುತ್ತಿರುವ ವಾಹನಗಳನ್ನು ಗುಂಡ್ಯದಲ್ಲೇ ಪೊಲೀಸರು ತಡೆಯುತ್ತಿದ್ದಾರೆ.

ಜುಲೈ 18ರಂದು ಶಿರಾಡಿ ಘಾಟಿ ರಸ್ತೆಯ ದೊಡ್ಡತಪ್ಲೆ ಬಳಿ ಭೂಕುಸಿತ ಸಂಭವಿಸಿತ್ತು. ಅದೃಷ್ಟವಶಾತ್ ಯಾವುದೇ ರೀತಿಯ ಹಾನಿ ಸಂಭವಿಸಿರಲಿಲ್ಲ. ನಂತರ ವಾಹನ ಸಂಚಾರ ಸ್ಥಗಿತಗೊಳಿಸಲಾಗಿತ್ತು. ಜುಲೈ 20ರಿಂದ ಹಗಲು ಸಂಚಾರಕ್ಕೆ ಮಾತ್ರ (ಬೆಳಗ್ಗೆ 6ರಿಂದ ಸಂಜೆ 6ರ ವರೆಗೆ) ಅನುಮತಿ ನೀಡಲಾಗಿತ್ತು.

ಇದನ್ನೂ ಓದಿ: ಹಾಸನ: ಸಕಲೇಶಪುರದ ಹಾರ್ಲೇ ಎಸ್ಟೇಟ್ ಬಳಿ ಭಯಾನಕ ಭೂ ಕುಸಿತ, ರಸ್ತೆ ಸಮೇತ ಕೊಚ್ಚಿ ಹೋದ ಭೂಮಿ

ಎರಡು ದಿನಗಳ ಹಿಂದಷ್ಟೇ ಎತ್ತಿನಹಳ್ಳದ ಬಳಿ ಏಕಾಏಕಿ ಗುಡ್ಡ ಕುಸಿದಿದ್ದು, ಮತ್ತೆ ಶಿರಾಡಿ ಘಾಟ್​ ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಸಂಚಾರ ಸ್ಥಗಿತಗೊಳಿಸಲಾಗಿತ್ತು. ಮಣ್ಣು ತೆರವು ಮಾಡಿದ ನಂತರ ಸಂಚಾರಕ್ಕೆ ಅವಕಾಶ ನೀಡಲಾಗಿತ್ತು. ಇದೀಗ ಮತ್ತೆ ಭೂಕುಸಿತ ಸಂಭವಿಸಿದ್ದು, ಸಂಚಾರ ಸ್ಥಗಿತಗೊಂಡಿದೆ.

ಉಪ್ಪಿನಂಗಡಿ ಬಳಿ ಹೆದ್ದಾರಿಗೆ ನೇತ್ರಾವತಿ ಪ್ರವಾಹ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆ ಮುಂದುವರಿದಿದ್ದು, ಉಪ್ಪಿನಂಗಡಿಯ ಪಂಜಳ ಬಳಿ ರಾಷ್ಟ್ರೀಯ ಹೆದ್ದಾರಿಗೆ ನೇತ್ರಾವತಿ ನದಿಯ ನೀರು ಬಂದಿದೆ. ರಸ್ತೆ ಮೇಲೆಯೇ ನದಿ ನೀರು ಹರಿಯುತ್ತಿರುವುದರಿಂದ ಮಂಗಳೂರು ಬೆಂಗಳೂರು ಹೆದ್ದಾರಿ ಸಂಚಾರ ಅಸ್ತವ್ಯಸ್ತಗೊಂಡಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 2:12 pm, Tue, 30 July 24