
ಹಾವೇರಿ, ನವೆಂಬರ್.27: ಹಾವೇರಿಯ ಸರ್ಕಾರಿ ವೈದ್ಯಕೀಯ ಕಾಲೇಜಿಗೆ ಸಂತ ಕನಕದಾಸರ ಹೆಸರಿಡಲಾಗುವುದು. ಕಾಗಿನೆಲೆಯಲ್ಲಿ ವಿದ್ಯಾರ್ಥಿ ನಿಲಯ ನಿರ್ಮಾಣಕ್ಕೆ 5 ಕೋಟಿ ರೂಪಾಯಿ ಅನುದಾನ ನೀಡಲಾಗುವುದು. ಶ್ರೀಗಳ ಭೂಮಿ ಬೇಡಿಕೆಯನ್ನು ಸಚಿವ ಸಂಪುಟದಲ್ಲಿ ಚರ್ಚಿಸಿ ಸೂಕ್ತ ತೀರ್ಮಾನ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಡಿಕೆ. ಶಿವಕುಮಾರ್ ಘೋಷಿಸಿದರು.
ಹಾವೇರಿಯ ಸುಕ್ಷೇತ್ರ ಕಾಗಿನೆಲೆಯಲ್ಲಿ ಶುಕ್ರವಾರ ನಡೆದ ಭಕ್ತಶ್ರೇಷ್ಠ ಕನಕದಾಸರ ಜಯಂತ್ಯೋತ್ಸವ ಉದ್ಘಾಟಿಸಿ ಮಾತನಾಡಿದ ಸಿಎಂ, ಕಾಗಿನೆಲೆಯನ್ನು ಜಾಗತಿಕ ಮಟ್ಟದ ಪ್ರವಾಸಿ ಕೇಂದ್ರವನ್ನಾಗಿ ಅಭಿವೃದ್ಧಿಪಡಿಸುವ ಉದ್ದೇಶವಿದೆ. ಈಗಾಗಲೇ ಕಾಗಿನೆಲೆ ಅಭಿವೃದ್ಧಿ ಪ್ರಾಧಿಕಾರದಡಿ 35 ಕೋಟಿ ರೂ. ವೆಚ್ಚದ ಯೋಜನೆ ರೂಪಿಸಲಾಗಿದೆ. ವಿದ್ಯಾರ್ಥಿ ನಿಲಯ ನಿರ್ಮಾಣಕ್ಕೆ 5 ಕೋಟಿ ರೂ. ನೀಡಲಾಗುವುದು. ಶ್ರೀಗಳ ಇತರ ಬೇಡಿಕೆಗಳನ್ನು ಪರಿಶೀಲಿಸಿ ಕ್ರಮ ಕೈಗೊಳ್ಳಲಾಗುವುದು ಎಂದರು.
ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ವೃತ್ತಿಪರ ಶಿಕ್ಷಣ ಪ್ರವೇಶದಲ್ಲಿ ಮೀಸಲಾತಿ ಕಲ್ಪಿಸುವುದರ ಜತೆಗೆ ಸರ್ಕಾರಿ ಶಾಲೆಗಳಲ್ಲಿ ಓದಿದ ಮಕ್ಕಳಿಗೆ ಶೇ.7.5 ಮೀಸಲಾತಿ ನೀಡಲು ಸರ್ಕಾರ ನಿರ್ಧರಿಸಿದೆ. ಹಾವೇರಿ ಜಿಲ್ಲೆಯ ಶಾಸಕರು ನೀರಾವರಿ ಯೋಜನೆಗಳಿಗೆ ಆದ್ಯತೆ ನೀಡಿದ್ದು, ಗುಡ್ಡದ ಮಲ್ಲಾಪುರ ಏತ ನೀರಾವರಿ ಯೋಜನೆಗೆ ₹115 ಕೋಟಿಗೂ ಅಧಿಕ ಅನುದಾನಕ್ಕೆ ಅನುಮೋದನೆ ನೀಡಲಾಗಿದೆ ಎಂದು ಹೇಳಿದರು.
ಕನಕದಾಸರು ಕೀರ್ತನೆಗಳ ಮೂಲಕ ಜಾತಿ ವ್ಯವಸ್ಥೆಯ ವಿಷಬೀಜವನ್ನು ಕಿತ್ತುಹಾಕಲು ಶ್ರಮಿಸಿದ ಮಹಾನ್ ಕ್ರಾಂತಿಕಾರಿಗಳು. ಭಕ್ತಿ ಅವರ ಸಾಧನವಾದರೆ, ಸಮಾನತೆ ಅವರ ಸಂದೇಶವಾಗಿತ್ತು. ಕನಕದಾಸರನ್ನು ಯಾವುದೇ ಒಂದು ಜಾತಿಗೆ ಸೀಮಿತಗೊಳಿಸಬಾರದು. ಬಸವಣ್ಣ, ಕನಕದಾಸರು ಹಾಗೂ ಅಂಬೇಡ್ಕರ್ ಅವರು ಇಡೀ ಸಮಾಜದ ಆಸ್ತಿಯಾಗಿದ್ದಾರೆ. ಆತ್ಮಕ್ಕೆ ಕುಲವಿಲ್ಲ ಎಂಬ ಸಂದೇಶವನ್ನು ಅವರು ಸಾರಿದ್ದಾರೆ. ಅವರ ಸಮಾನತೆಯ ತತ್ವಗಳನ್ನು ಪ್ರತಿಯೊಬ್ಬರೂ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದರು.
ಕನಕದಾಸರ ಸಂದೇಶದಂತೆ ಹಸಿದವರಿಗೆ ಅನ್ನ ನೀಡುವ ಉದ್ದೇಶದಿಂದ ಸರ್ಕಾರ ಅನ್ನಭಾಗ್ಯ ಯೋಜನೆ ಜಾರಿಗೊಳಿಸಿದೆ. ರಾಜ್ಯದ 4.21 ಕೋಟಿ ಜನರಿಗೆ ಯೋಜನೆಯಡಿ ಸೌಲಭ್ಯ ಕಲ್ಪಿಸಲಾಗುತ್ತಿದ್ದು, ವಾರ್ಷಿಕ 8,500 ಕೋಟಿ ವೆಚ್ಚ ಮಾಡಲಾಗುತ್ತಿದೆ. ಜನರ ಆರ್ಥಿಕ ಹೊರೆ ತಗ್ಗಿಸಲು ಐದು ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸಲಾಗಿದೆ ಎಂದು ತಿಳಿಸಿದರು.