ಹಾವೇರಿಯಲ್ಲಿ ಹೆಚ್ಚಿದ ಬೀದಿ ನಾಯಿಗಳ ದಾಳಿ: ಇಬ್ಬರು ಮಕ್ಕಳಿಗೆ ಗಂಭೀರ ಗಾಯ
ಹಾವೇರಿ ಜಿಲ್ಲೆಯ ಬಂಕಾಪುರ ಪಟ್ಟಣದಲ್ಲಿ ಬೀದಿ ನಾಯಿಗಳ ಹಾವಳಿ ಹೆಚ್ಚಾಗಿದ್ದು, ಇಬ್ಬರು ಪುಟ್ಟ ಮಕ್ಕಳ ಮೇಲೆ ದಾಳಿ ನಡೆಸಿದೆ. ಘಟನೆಯಲ್ಲಿ ಮಕ್ಕಳು ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಪುರಸಭೆಯ ನಿರ್ಲಕ್ಷ್ಯವೇ ಇದಕ್ಕೆ ಕಾರಣವೆಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದು, ಬೀದಿ ನಾಯಿಗಳನ್ನು ನಿಯಂತ್ರಿಸಲು ತುರ್ತು ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದಾರೆ.

ಹಾವೇರಿ, ಜನವರಿ 03: ಜಿಲ್ಲೆಯ ಶಿಗ್ಗಾಂವಿ ತಾಲ್ಲೂಕಿನ ಬಂಕಾಪುರ ಪಟ್ಟಣದಲ್ಲಿ ಬೀದಿ ನಾಯಿಗಳ ಹಾವಳಿ ದಿನೇದಿನೇ ಹೆಚ್ಚಾಗುತ್ತಿದ್ದು, ಸಾರ್ವಜನಿಕರಲ್ಲಿ ಆತಂಕ ಮೂಡಿಸಿದೆ. ಇತ್ತೀಚೆಗಷ್ಟೇ ಮನೆಯ ಮುಂದೆ ಆಟವಾಡುತ್ತಿದ್ದ ಇಬ್ಬರು ಪುಟ್ಟ ಬಾಲಕರ ಮೇಲೆ ಬೀದಿ ನಾಯಿ ದಾಳಿ ನಡೆಸಿದ ಘಟನೆ ಸಂಭವಿಸಿದೆ.ಬಂಕಾಪುರ ಪುರಸಭೆಯ ಅಧಿಕಾರಿಗಳು ಬೀದಿ ನಾಯಿಗಳನ್ನ ನಿಯಂತ್ರಣ ಮಾಡುವ ಕೆಲಸ ಮಾಡಬೇಕು ಎಂದು ಸ್ಥಳೀಯರು ಆಗ್ರಹಿಸಿದ್ದಾರೆ.
ಪುರಸಭೆಯ ನಿರ್ಲಕ್ಷ್ಯಕ್ಕೆ ಗ್ರಾಮಸ್ಥರು ಕಿಡಿ
ಬೀದಿ ನಾಯಿಗಳ ಕಾಟದಿಂದ ಮಕ್ಕಳು, ವೃದ್ಧರೆನ್ನದೇ ಇಡೀ ಊರಿನ ಜನರು ತತ್ತರಿಸಿದ್ದಾರೆ. ಇತ್ತೀಚೆಗೆ ಜಿಲ್ಲೆಯಲ್ಲಿ ಬೀದಿ ನಾಯಿಗಳು ಇಬ್ಬರು ಮಕ್ಕಳ ಮೇಲೆ ದಾಳಿ ನಡೆಸಿದ್ದು, 5 ವರ್ಷದ ಹಸನ್ ಹಾಗೂ 3 ವರ್ಷದ ಅಕ್ರಮ್ ಗಂಭೀರವಾಗಿ ಗಾಯಗೊಂಡಿದ್ದಾರೆ. ಮಕ್ಕಳ ಕೈ, ಕಾಲು ಹಾಗೂ ಎದೆ ಭಾಗಕ್ಕೆ ಗಂಭೀರ ಗಾಯಗಳಾಗಿದ್ದು, ರಕ್ತಸ್ರಾವವಾಗಿದೆ. ಗಾಯಗೊಂಡ ಮಕ್ಕಳನ್ನು ತಕ್ಷಣ ಹಾವೇರಿ ಜಿಲ್ಲಾ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ. ಗಾಯದ ತೀವ್ರತೆಯನ್ನು ಗಮನಿಸಿ ಒಬ್ಬ ಬಾಲಕನನ್ನು ಹೆಚ್ಚಿನ ಚಿಕಿತ್ಸೆಗೆ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ರವಾನೆ ಮಾಡಲಾಗಿದೆ.
ಘಟನೆಗೆ ಪುರಸಭೆಯ ನಿರ್ಲಕ್ಷ್ಯವೇ ಈ ಅವಘಡಕ್ಕೆ ಕಾರಣವೆಂದು ಆರೋಪಿಸಿ ಪೋಷಕರು ಹಾಗೂ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬೀದಿ ನಾಯಿಗಳ ನಿಯಂತ್ರಣಕ್ಕೆ ತಕ್ಷಣ ಕ್ರಮ ಕೈಗೊಳ್ಳಬೇಕೆಂದು ಬಂಕಾಪುರ ಪುರಸಭೆ ಅಧಿಕಾರಿಗಳಿಗೆ ಸಾರ್ವಜನಿಕರು ಒತ್ತಾಯಿಸಿದ್ದಾರೆ.
ಅಣ್ಣಪ್ಪ ಬಾರ್ಕಿ, ಟಿವಿ9 ಬೆಂಗಳೂರು
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.




