ಶಿಗ್ಗಾಂವಿ: ಬಂಕಾಪುರದಲ್ಲಿ ಚಾಲಕನ ನಿಯಂತ್ರಣ ತಪ್ಪಿ ಹಳ್ಳಕ್ಕೆ ಬಿದ್ದ ಸಾರಿಗೆ ಬಸ್
ಹಳ್ಳದಲ್ಲಿ ಭಾರಿ ಪ್ರಮಾಣದ ನೀರು ಇಲ್ಲದ್ದರಿಂದ ದೊಡ್ಡ ದುರಂತ ತಪ್ಪಿದೆ. ಅದೃಷ್ಟವಶಾತ್ ಬಸ್ಸಿನಲ್ಲಿದ್ದವರು ಪ್ರಾಣಾಪಾಯದಿಂದ ಪಾರಾಗಿದ್ದು, ಗಾಯಾಳುಗಳಿಗೆ ಬಂಕಾಪುರ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಲಾಗಿದೆ.
ಹಾವೇರಿ: ಹಾವೇರಿ ಜಿಲ್ಲೆ ಶಿಗ್ಗಾಂವಿ ತಾಲೂಕಿನ ಬಂಕಾಪುರ ಪಟ್ಟಣದಲ್ಲಿರೋ ಲಂಡೇನಹಳ್ಳಕ್ಕೆ ಸಾರಿಗೆ ಬಸ್ ಬಿದ್ದಿದೆ. ಚಾಲಕನ ನಿಯಂತ್ರಣ ತಪ್ಪಿ ಹಳ್ಳಕ್ಕೆ ಬಿದ್ದ ಸಾರಿಗೆ ಬಸ್ಸಿನಲ್ಲಿ ಪ್ರಯಾಣಿಸ್ತಿದ್ದ ಏಳು ಜನರಿಗೆ ಗಾಯಗಳಾಗಿವೆ. ಗದಗದಿಂದ ಹಾವೇರಿಗೆ ತೆರಳುತ್ತಿದ್ದ ವೇಳೆ ಚಾಲಕನ ನಿಯಂತ್ರಣ ತಪ್ಪಿ, ಪಲ್ಟಿ ಹೊಡೆದ ಬಸ್ ಹಳ್ಳಕ್ಕೆ ಬಿದ್ದಿದೆ. ಬಸ್ ಹಳ್ಳಕ್ಕೆ ಬಿದ್ದ ವಿಷಯ ತಿಳಿಯುತ್ತಿದ್ದಂತೆ ಬಸ್ಸಿನಲ್ಲಿದ್ದವರನ್ನು ಸ್ಥಳೀಯರು ಹಾಗೂ ಪೊಲೀಸರು ರಕ್ಷಿಸಿದ್ದಾರೆ.
ಹಳ್ಳದಲ್ಲಿ ಭಾರಿ ಪ್ರಮಾಣದ ನೀರು ಇಲ್ಲದ್ದರಿಂದ ದೊಡ್ಡ ದುರಂತ ತಪ್ಪಿದೆ. ಅದೃಷ್ಟವಶಾತ್ ಬಸ್ಸಿನಲ್ಲಿದ್ದವರು ಪ್ರಾಣಾಪಾಯದಿಂದ ಪಾರಾಗಿದ್ದು, ಗಾಯಾಳುಗಳಿಗೆ ಬಂಕಾಪುರ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಲಾಗಿದೆ. ಹೆಚ್ಚಿನ ಚಿಕಿತ್ಸೆಗಾಗಿ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಹಳ್ಳದಲ್ಲಿ ಬಿದ್ದಿರೋ ಬಸ್ಸನ್ನು ಮೇಲೆತ್ತಲು ಕಾರ್ಯಾಚರಣೆ ಮುಂದುವರಿದಿದೆ. ಬಂಕಾಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.