
ಬೆಂಗಳೂರು, ಡಿಸೆಂಬರ್ 24: ಬೆಂಗಳೂರು-ಮೈಸೂರು ಇನ್ಫಾಸ್ಟ್ರಕ್ಚರ್ ಯೋಜನೆಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್‌ನಲ್ಲಿ ಸಲ್ಲಿಕೆಯಾಗಿರುವ ರಿಟ್ ಅರ್ಜಿಯಲ್ಲಿ ತಮ್ಮನ್ನೂ ಪಾರ್ಟಿಯಾಗಿ ಮಾಡಿರುವುದಕ್ಕೆ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ (HD Deve Gowda) ಅವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಜೆಡಿಎಸ್ ಪಕ್ಷದ ರಾಜ್ಯ ಕಚೇರಿಯಾದ ಜೆಪಿ ಭವನದಲ್ಲಿ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಬಿಎಂಐಸಿ ಯೋಜನೆಗೆ ಒಪ್ಪಂದ ಮಾಡಿಕೊಳ್ಳುವಾಗ ತಾನು ಸಿಎಂ ಆಗಿದ್ದೆ. ಸಿದ್ದರಾಮಯ್ಯ ಹಣಕಾಸು ಸಚಿವರಾಗಿದ್ದರು. ಆ ಯೋಜನೆಗೆ ಹಣಕಾಸು ಇಲಾಖೆಯ ಸಮ್ಮತಿಯೂ ಇತ್ತು. ಆ ಒಪ್ಪಂದದ ಎಲ್ಲಾ ಮಾಹಿತಿಯೂ ಅವರಿಗೆ ಕೂಡ ಇದೆ. ಆದರೆ, ಕೆಲ ರೈತರು ಹಾಗೂ ನನ್ನನ್ನು ಪಾರ್ಟಿ ಮಾಡಿದ್ದಾರೆ. ಈ ಇಳಿ ವಯಸ್ಸಿನಲ್ಲೂ ನಾನು ವಕೀಲರಿಗೆ ಶುಲ್ಕ ಕೊಟ್ಟು ಕೋರ್ಟ್‌ನಲ್ಲಿ ಹೋರಾಟ ಮಾಡಬೇಕಾಗಿದೆ’ ಎಂದು ಬೇಸರ ಹೊರಹಾಕಿದರು.
‘ನೈಸ್ ಕಂಪನಿ ವಿಚಾರದಲ್ಲಿ ಕಾನೂನು ಸಲಹೆಗಾರರಿಗೆ 55 ಲಕ್ಷ ರೂಪಾಯಿ ಕೊಡುತ್ತಿದ್ದಾರಂತೆ. ರಾಜ್ಯ ಸರ್ಕಾರದ ಅಡ್ವೋಕೇಟ್ ಜನರಲ್, ಕಾನೂನು ಸಲಹೆಗಾರರು ಇದ್ದರೂ ಸಹ ಇನ್ನೊಬ್ಬರನ್ನು ನೈಸ್ ಕಂಪನಿಗೆ ಸಂಬಂಧಿಸಿದಂತೆ ಕಾನೂನು ಸಲಹೆಗಾರರನ್ನು ನೇಮಿಸಿಕೊಂಡಿದ್ದಾರೆ’ ಎಂದು ಅವರು ಕಟುವಾಗಿ ಟೀಕಿಸಿದರು.
ಒಂದು ಲಕ್ಷಕ್ಕೂ ಹೆಚ್ಚು ನೌಕರರು ಹೊರಗುತ್ತಿಗೆ ಮೂಲಕ ಕೆಲಸ ಮಾಡುತ್ತಿದ್ದಾರೆ. ಲಕ್ಷಾಂತರ ಹುದ್ದೆಗಳು ಭರ್ತಿಯಾಗದೇ ಹಾಗೆಯೇ ಖಾಲಿ ಉಳಿದಿವೆ. ವಿಕ್ಟೋರಿಯಾ ಆಸ್ಪತ್ರೆಗೆ ಭೇಟಿ ನೀಡಿದರೆ ಎಷ್ಟು ಹೊರಗುತ್ತಿಗೆ ನೌಕರರು ಕೆಲಸ ಮಾಡುತ್ತಿದ್ದಾರೆ ಎಂಬುದು ಎಲ್ಲರಿಗೂ ಗೊತ್ತಾಗುತ್ತದೆ ಎಂದು ದೇವೇಗೌಡರು ದೂರಿದರು.
ಇದನ್ನೂ ಓದಿ: ಅಪೆಕ್ಸ್ ಬ್ಯಾಂಕ್ ಜಟಾಪಟಿ: ರಾಜಣ್ಣ ಭೇಟಿ ಮಾಡಿದ್ದ ಡಿಕೆ ಶಿವಕುಮಾರ್ಗೆ ಚೆಕ್ಮೇಟ್ ಕೊಟ್ಟ ಸಿದ್ದರಾಮಯ್ಯ!
ರಾಜ್ಯದ ಕೆಲ ಹಣಕಾಸು ಸಮಸ್ಯೆಗಳಿಗೆ ಕೇಂದ್ರ ಸರ್ಕಾರವನ್ನು ಸಿಎಂ ಸಿದ್ದರಾಮಯ್ಯ ದೂಷಿಸುವುದನ್ನು ಎಚ್ಡಿಡಿ ವಿರೋಧಿಸಿದ್ದಾರೆ.
‘ರಾಜ್ಯ ಸರ್ಕಾರ ಪ್ರತೀ ವಿಷಯಕ್ಕೂ ಕೇಂದ್ರ ಸರ್ಕಾರವನ್ನು ದೂರುತ್ತಾ ಕೂತರೆ ಪ್ರಯೋಜನ ಇಲ್ಲ. ಅದರಿಂದ ಏನೂ ಸಾಧನೆ ಮಾಡಲು ಸಾಧ್ಯವಿಲ್ಲ. ಸಿದ್ದರಾಮಯ್ಯ ಅವರು ಹಣಕಾಸು ಸಚಿವರಾಗಿದ್ದಾಗ ಕೇಂದ್ರ ಸರ್ಕಾರದಲ್ಲಿ ಡಾ. ಮನಮೋಹನ ಸಿಂಗ್ ಅವರು ಹಣಕಾಸು ಸಚಿವರಾಗಿದ್ದರು. ನಮ್ಮ ಪಕ್ಷದ ಪ್ರಣಾಳಿಕೆಯಲ್ಲಿ ನೀಡಲಾಗಿದ್ದ ಭರವಸೆಯಂತೆ ರೈತರ ಸಾಲದ ಮೇಲಿನ ಸುಸ್ತಿ ಬಡ್ಡಿ ಮನ್ನಾ ಮಾಡಲು ಪತ್ರ ಬರೆದಾಗ ಕೇಂದ್ರ ಮನಮೋಹನ್ ಸಿಂಗ್, ಆಗಿನ ಪ್ರಧಾನಿ ಪಿ.ವಿ. ನರಸಿಂಹರಾವ್, ನಬಾರ್ಡ್ ಯಾರೂ ಕೂಡ ಒಪ್ಪಿಗೆ ಕೊಡಲಿಲ್ಲ. ಈಗ ನೋಡಿದರೆ ರಾಜ್ಯ ಸರ್ಕಾರ ಬೆಳಗಿನಿಂದ ಸಂಜೆಯವರೆಗೂ ಕೇಂದ್ರ ಸರ್ಕಾರದ ಮೇಲೆ ಆರೋಪ ಮಾಡುತ್ತ ಕಾಲಹರಣ ಮಾಡುತ್ತಿದೆ. ಹೀಗೆ ಟೀಕೆ ಮಾಡುತ್ತಾ ಹೋದರೆ ಆಗುವ ಪ್ರಯೋಜನ ಏನು? ಮುಖ್ಯಮಂತ್ರಿ ಆದವರು ಪ್ರಧಾನಿಗಳ ಅಧ್ಯಕ್ಷತೆಯಲ್ಲಿ ನಡೆಯುವ ದಿಶಾ ಸಭೆಗೆ ಹೋಗಿ ರಾಜ್ಯಕ್ಕೆ ಏನು ಬೇಕು ಎಂಬುದರ ಬಗ್ಗೆ ಚರ್ಚೆ ಮಾಡಿ ಹೋರಾಟ ಮಾಡಬೇಕು’ ಎಂದು ದೇವೇಗೌಡರು ರಾಜ್ಯ ಸರ್ಕಾರಕ್ಕೆ ತಿಳಿಹೇಳಿದರು.
‘ಜನವರಿ 30ರಂದು ಸಂಸತ್‌ನ ಜಂಟಿ ಅಧಿವೇಶನ ಶುರುವಾಗುತ್ತಿದ್ದು, ಅದಕ್ಕೂ ಮೊದಲೇ ಜನವರಿ 23ರಿಂದ 25ರ ನಡುವೆ ಹಾಸನ ಹಾಗೂ ಬಾಗಲಕೋಟೆ ಭಾಗದಲ್ಲಿ ಪಕ್ಷದ ವತಿಯಿಂದ ತಲಾ ಒಂದು ಸಮಾವೇಶ ನಡೆಸಲಾಗುವುದು. ಈ ಬಗ್ಗೆ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರಿಗೆ ತಿಳಿಸಿದ್ದೇನೆ. ರಾಜ್ಯ ಸರ್ಕಾರದ ವೈಫಲ್ಯಗಳು ಕುಮಾರಸ್ವಾಮಿ ಆಡಳಿತಾವಧಿಯಲ್ಲಿ ಜಾರಿಗೊಳಿಸಿದ್ದ ಜನಪರ ಕಾರ್ಯಕ್ರಮಗಳನ್ನು ಮುಂದುವರೆಸದಿರುವುದರ ಬಗ್ಗೆ ಸಮಾವೇಶದಲ್ಲಿ ಪ್ರಸ್ತಾಪಿಸಲಾಗುವುದು’ ಎಂದರು.
ನರೇಗಾ ಯೋಜನೆ ಹೆಸರನ್ನು ಬದಲಾವಣೆ ಮಾಡಿದರು ಎನ್ನುವ ಕಾರಣಕ್ಕೆ ಕಾಂಗ್ರೆಸ್ ನಾಯಕರು ನರೇಂದ್ರ ಮೋದಿ ಅವರ ಬಗ್ಗೆ ಟೀಕೆ ಮಾಡುತ್ತಿದ್ದಾರೆ. ಆದರೆ, ಕಾಂಗ್ರೆಸ್ನವರು ಆಡಳಿತ ನಡೆಸುತ್ತಿದ್ದಾಗ ಮಹಾತ್ಮ ಗಾಂಧಿ ಅವರಿಗೆ ಎಷ್ಟು ಗೌರವ ನೀಡಿದ್ದಾರೆ ಎನ್ನುವುದು ತನಗೆ ಗೊತ್ತಿದೆ ಎಂದು ಮಾಜಿ ಪ್ರಧಾನಿಗಳು ವ್ಯಂಗ್ಯ ಮಾಡಿದರು.
ನರೇಗಾ ಹೆಸರು ಬದಲಾವಣೆ ವಿಚಾರಕ್ಕೆ ಕಾಂಗ್ರೆಸ್ ಪ್ರತಿರೋಧ ವಿಚಾರದ ಬಗ್ಗೆ ಕೇಳಲಾದ ಪ್ರಶ್ನೆಗೆ ಉತ್ತರಿಸಿದ ಅವರು, ‘ಮಹಾತ್ಮಾ ಗಾಂಧಿ ಅವರ ಬಗ್ಗೆ ಇಷ್ಟೊಂದು ಕಾಳಜಿ, ಕಳಕಳಿ ಇರುವವರು ಇಂದಿರಾ ಗಾಂಧಿ, ರಾಜೀವ್ ಗಾಂಧಿ ಆಳ್ವಿಕೆ ಮಾಡಿದ ಸಂದರ್ಭದಲ್ಲಿ ಎಲ್ಲಿಯಾದರೂ ಗಾಂಧೀಜಿ ಅವರ ಒಂದು ಪೋಸ್ಟರ್ ನೋಡಿದೀರಾ? ಎಲ್ಲಿಯಾದರೂ ಮಹಾತ್ಮ ಗಾಂಧಿ ಅವರ ಫೋಟೋ ಇಟ್ಟುಕೊಂಡು ಚುನಾವಣೆ ನಡೆಸಿದ್ದಾರಾ?’ ಎಂದು ಪ್ರಶ್ನೆ ಮಾಡಿದರು.
ಇದನ್ನೂ ಓದಿ: ಸಿದ್ದರಾಮಯ್ಯ ಅತ್ಯಾಪ್ತನಿಗೆ ಡಿಕೆ ಶಿವಕುಮಾರ್ ಗಾಳ: ಮೇಲಿಂದ ಮೇಲೆ ಭೇಟಿಯ ರಹಸ್ಯ ಬಯಲು
‘ನಾನು ಮೋದಿ ಅವರನ್ನು ಹೊಗಳಲು ಬಂದಿಲ್ಲ. ಆದರೆ ಮೋದಿ ಅವರಿಗೆ ದೇಶ ನಡೆಸಲು ಗೊತ್ತು. ಎಲ್ಲೆಲ್ಲಿ ಹಣ ಪೋಲಾಗ್ತಾ ಇದೆ ಅಂತ ಕೂಡ ಅವರಿಗೆ ಗೊತ್ತು. ಯಾವ ರಾಜ್ಯ ಹೇಗೆಲ್ಲಾ ಹಣ ಖರ್ಚು ಮಾಡುತ್ತಿದೆ ಎಂಬುದು ಕೂಡ ಅವರಿಗೆ ಗೊತ್ತು’ ಎಂದು ಹೇಳಿದರು.
‘ನರೇಗಾಗೆ 60:40 ಅನುಪಾತದಲ್ಲಿ ಅನುದಾನ ಹಂಚಿಕೆ ಮಾಡಿದ್ದಾರೆ. ಕೆಲಸದ ದಿನಗಳನ್ನು ಹೆಚ್ಚು ಮಾಡಿದ್ದಾರೆ. ರಾಮನ ಹೆಸರು ಇಟ್ಟಿದ್ದಾರೆ ಅಂತಾರೆ. ನಮ್ಮ ಮನೆಗೆ ಬನ್ನಿ, ರಾಮ, ಕೃಷ್ಣ ವೆಂಕಟೇಶ್ವರ ಎಲ್ಲರ ಫೋಟೋಗಳು ಇವೆ.ರಾಮ ಪುರುಷೋತ್ತಮ ಅಂತ ವಾಲ್ಮೀಕಿ ಹೇಳಿದ್ದಾರೆ. ಇದರ ಬಗ್ಗೆ ಇಷ್ಟು ಜಿಜ್ಞಾಸೆ ಯಾಕೆ?’ ಎಂದು ಎಚ್.ಡಿ. ದೇವೇಗೌಡರು ವಿವರಿಸಿದರು.
ವಿಧಾನ ಪರಿಷತ್ ಸದಸ್ಯ ಟಿ.ಎನ್. ಜವರಾಯಿ ಗೌಡ, ಮಾಜಿ ಸದಸ್ಯರಾದ ಕೆ.ಎ. ತಿಪ್ಪೇಸ್ವಾಮಿ, ಚೌಡರೆಡ್ಡಿ ತೂಪಲ್ಲಿ ಮುಂತಾದವರು ಈ ಸುದ್ದಿಗೋಷ್ಠಿಯಲ್ಲಿ ಹಾಜರಿದ್ದರು.
ಇನ್ನಷ್ಟು ರಾಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ