ಸ್ಥಳೀಯ ಸಂಸ್ಥೆಗಳ ಕತ್ತು ಹಿಸುಕಿ ನೀವು ವಿಧಾನಸೌಧದಲ್ಲಿ ಮೆರೆದರೇನು ಭಾಗ್ಯ? ಸಿದ್ದರಾಮಯ್ಯಗೆ ಕುಮಾರಸ್ವಾಮಿ ಟಾಂಗ್

|

Updated on: Sep 16, 2024 | 10:23 AM

ಕರ್ನಾಟಕ ಕಾಂಗ್ರೆಸ್ ಸರ್ಕಾರ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನದ ಅಂಗವಾಗಿ ಭಾನುವಾರ ರಾಜ್ಯದ ಶಾಲೆಗಳಲ್ಲಿ ಮಾನವ ಸರಪಳಿ ನಿರ್ಮಿಸಿದ್ದರ ಬಗ್ಗೆ ಕೇಂದ್ರ ಸಚಿವ ಹೆಚ್​ಡಿ ಕುಮಾರಸ್ವಾಮಿ ವ್ಯಂಗ್ಯವಾಡಿದ್ದಾರೆ. ಸ್ಥಳೀಯ ಸಂಸ್ಥೆಗಳ ಕತ್ತು ಹಿಸುಕಿ ವಿಧಾನಸೌಧದಲ್ಲಿ ಮೆರೆಯುತ್ತಿರುವವರದ್ದು, ಪ್ರಚಾರ ಜಾಸ್ತಿ, ಆಚಾರ ನಾಸ್ತಿ ಎಂಬಂತಾಗಿದೆ ಎಂದು ಅವರು ಲೇವಡಿ ಮಾಡಿದ್ದಾರೆ.

ಸ್ಥಳೀಯ ಸಂಸ್ಥೆಗಳ ಕತ್ತು ಹಿಸುಕಿ ನೀವು ವಿಧಾನಸೌಧದಲ್ಲಿ ಮೆರೆದರೇನು ಭಾಗ್ಯ? ಸಿದ್ದರಾಮಯ್ಯಗೆ ಕುಮಾರಸ್ವಾಮಿ ಟಾಂಗ್
ಸಿದ್ದರಾಮಯ್ಯ & ಕುಮಾರಸ್ವಾಮಿ
Follow us on

ಬೆಂಗಳೂರು, ಸೆಪ್ಟೆಂಬರ್ 16: ಕರ್ನಾಟಕ ಕಾಂಗ್ರೆಸ್ ಸರ್ಕಾರದ ಮಾನವ ಸರಪಳಿ ಮುಂದಿಟ್ಟುಕೊಂಡು ಸಿಎಂ ಸಿದ್ದರಾಮಯ್ಯ ಹಾಗೂ ಕಾಂಗ್ರೆಸ್ ವಿರುದ್ಧ ಕೇಂದ್ರ ಸಚಿವ ಹೆಚ್​​ಡಿ ಕುಮಾರಸ್ವಾಮಿ ವಾಗ್ದಾಳಿ ನಡೆಸಿದ್ದಾರೆ. ಮಾನವ ಸರಪಳಿ ನೆಪದಲ್ಲಿ ಪುಕ್ಕಟೆ ಪ್ರಚಾರ ಗಿಟ್ಟಿಸಿದ ಕರ್ನಾಟಕ ಕಾಂಗ್ರೆಸ್​ ಸರಕಾರಕ್ಕೆ ಪ್ರಜಾಪ್ರಭುತ್ವ ಉಳಿಸುವ ಕಾಳಜಿಯೇ ಇಲ್ಲ. ಇದ್ದಿದ್ದರೆ ಸ್ಥಳೀಯ ಸಂಸ್ಥೆಗಳ ಕತ್ತು ಹಿಸುಕಿ ವಿಧಾನಸೌಧದಲ್ಲಿ ಮೆರೆಯುತ್ತಿರಲಿಲ್ಲ ಎಂದು ಅವರು ಸಾಮಾಜಿಕ ಮಾಧ್ಯಮ ಎಕ್ಸ್​​ನಲ್ಲಿ ಸಂದೇಶ ಪ್ರಕಟಿಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

‘ಮಾನವ ಸರಪಳಿ ನೆಪದಲ್ಲಿ ಪುಕ್ಕಟೆ ಪ್ರಚಾರ ಗಿಟ್ಟಿಸಿದ ಕಾಂಗ್ರೆಸ್ ಸರಕಾರಕ್ಕೆ ಪ್ರಜಾಪ್ರಭುತ್ವ ಉಳಿಸುವ ಕಾಳಜಿಯೇ ಇಲ್ಲ. ಇದ್ದರೆ ಮೊದಲು ಸ್ಥಳೀಯ ಸಂಸ್ಥೆಗಳ ಚುನಾವಣೆ ನಡೆಸಲಿ. ಅಧಿಕಾರಕ್ಕೇರಿದಾಗಿನಿಂದ ಪ್ರಜಾಪ್ರಭುತ್ವದ ಸರಪಳಿಯ ತಳಮಟ್ಟದ ಆಧಾರಸ್ತಂಭಗಳಾದ ಜಿಲ್ಲಾ & ತಾಲೂಕು ಪಂಚಾಯತಿ ಮತ್ತು ಬಿಬಿಎಂಪಿ ಚುನಾವಣೆ ನಡೆಸಿಲ್ಲ, ಯಾಕೆ? ಸ್ಥಳೀಯ ಸರಕಾರಗಳ ಕತ್ತು ಹಿಸುಕಿ ನೀವು ವಿಧಾನಸೌಧದಲ್ಲಿ ಮೆರೆದರೇನು ಭಾಗ್ಯ? ಮಾನ್ಯ ಸಿದ್ದರಾಮಯ್ಯನವರೇ, ನೀವು ಅಧಿಕಾರಕ್ಕೆ ಬಂದು ವರ್ಷದ ಮೇಲೆ 4 ತಿಂಗಳಾಯಿತು (2023 ಮೇ 20). ಈವರೆಗೂ ಸ್ಥಳೀಯ ಸಂಸ್ಥೆಗಳ ಚುನಾವಣೆ ನಡೆಸಲು ಸಾಧ್ಯವಾಗಿಲ್ಲ. ನಿಮ್ಮ ಪ್ರಜಾಪ್ರಭುತ್ವ, ಜನಪರತೆ, ಜಾಹೀರಾತುಗಳಲ್ಲಷ್ಟೆ ಝಗಮಗಿಸುತ್ತಿದೆ’ ಎಂದು ಕುಮಾರಸ್ವಾಮಿ ವಾಗ್ದಾಳಿ ನಡೆಸಿದ್ದಾರೆ.

ಕುಮಾರಸ್ವಾಮಿ ಎಕ್ಸ್ ಸಂದೇಶ

‘ಪ್ರಚಾರ ಜಾಸ್ತಿ, ಆಚಾರ ನಾಸ್ತಿ!’

ವಿಚ್ಚಿಧ್ರ ಶಕ್ತಿಗಳನ್ನು ದಮನ ಮಾಡುವುದು ಎಂದರೆ ಡಾ.ಬಾಬಾಸಾಹೇಬ್ ಅಂಬೇಡ್ಕರ್ ಅವರ ತತ್ವಕ್ಕೆ ತಿಲಾಂಜಲಿ ಇಡುವುದೇ? ಮಾನವ ಸರಪಳಿಯಿಂದ ಪ್ರಜಾಪ್ರಭುತ್ವ ಉಳಿಯುತ್ತದೆಯೇ? ಜನರ ತೆರಿಗೆ ಹಣದ ಪೋಲು ಪ್ರಜಾಪ್ರಭುತ್ವಕ್ಕೆ ಭೂಷಣವೇ? ಮೊದಲು ಸ್ಥಳೀಯ ಸಂಸ್ಥೆ ಚುನಾವಣೆ ಘೋಷಿಸಿ. ನೈಜ ಪ್ರಜಾಪ್ರಭುತ್ವದ ಸರಪಳಿಯನ್ನು ಗಟ್ಟಿಗೊಳಿಸಿ. #SaveDemocracy ಎಂಬ ಹ್ಯಾಷ್​​​ಟ್ಯಾಗ್​ನಲ್ಲಿ ಕುಮಾರಸ್ವಾಮಿ ಉಲ್ಲೇಖಿಸಿದ್ದಾರೆ.

ಇದನ್ನೂ ಓದಿ: ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ: 2,500 ಕಿ.ಮೀ.ಉದ್ದದ ಮಾನವ ಸರಪಳಿಗೆ ವರ್ಲ್ಡ್ ಬುಕ್ ಆಫ್ ರೆಕಾರ್ಡ್‌ನಿಂದ ಪ್ರಶಸ್ತಿ

ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನದ ಅಂಗವಾಗಿ ಕರ್ನಾಟಕದ ಸರ್ಕಾರಿ ಶಾಲೆಗಳಲ್ಲಿ ಭಾನುವಾರ ಜಗತ್ತಿನ ಅತಿ ಉದ್ದದ ಮಾನವ ಸರಪಳಿ ರಚಿಸಿ ದಾಖಲೆ ನಿರ್ಮಾಣ ಮಾಡಲಾಗಿತ್ತು. ಪ್ರಜಾಪ್ರಭುತ್ವದ ಮಹತ್ವ ಸಾರಲು ಮತ್ತು ಸಮಾನತೆ, ಐಕ್ಯತೆ, ಸಾಮರಸ್ಯ, ಸಾಮಾಜಿಕ ನ್ಯಾಯವನ್ನು ಬಿಂಬಿಸುವ ನಿಟ್ಟಿನಲ್ಲಿ ಈ ಕಾರ್ಯಕ್ರಮ ಹಮ್ಮಿಕೊಂಡಿದ್ದಾಗಿ ಸರ್ಕಾರ ಹೇಳಿತ್ತು. ಇದೀಗ ಅದೇ ವಿಚಾರ ಮುಂದಿಟ್ಟುಕೊಂಡು ಕುಮಾರಸ್ವಾಮಿ ವಾಗ್ದಾಳಿ ನಡೆಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 10:22 am, Mon, 16 September 24