ಫುಟ್‌ಪಾತ್ ಬೈಕ್ ಸವಾರರಿಗೆ ಭಾರಿ ದಂಡದ ಶಾಕ್: ಹಾಫ್ ಹೆಲ್ಮೆಟ್ ನಿಷೇಧಕ್ಕೆ ಸರ್ಕಾರ ಚಿಂತನೆ

ರಾಜ್ಯದಲ್ಲಿ ಹಾಫ್ ಹೆಲ್ಮೆಟ್‌ಗಳ ಬಳಕೆಯನ್ನು ನಿಷೇಧಿಸುವ ಬಗ್ಗೆ ಸರ್ಕಾರ ಚಿಂತನೆ ನಡೆಸಿದೆ. ಉತ್ಪಾದನೆ ಮತ್ತು ಮಾರಾಟಗಾರರ ವಿರುದ್ಧ ಕೂಡ ಕ್ರಮಕೈಗೊಳ್ಳುವ ಬಗ್ಗೆ ಚರ್ಚೆ ಮಾಡಲಾಗುತ್ತಿದೆ. ಮತ್ತೊಂದೆಡೆ ಫುಟ್​ಪಾತ್​ ಮೇಲೆ ಬೈಕ್​ ಓಡಿಸಿದರೆ ವಿಧಿಸಲಾಗುತ್ತಿದ್ದ ದಂಡದ ಮೊತ್ತವನ್ನು ಹೆಚ್ಚಳಕ್ಕೆ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ.

ಫುಟ್‌ಪಾತ್ ಬೈಕ್ ಸವಾರರಿಗೆ ಭಾರಿ ದಂಡದ ಶಾಕ್: ಹಾಫ್ ಹೆಲ್ಮೆಟ್ ನಿಷೇಧಕ್ಕೆ ಸರ್ಕಾರ ಚಿಂತನೆ
Footpathfine
Edited By:

Updated on: Sep 30, 2026 | 9:29 PM

ಮುಖ್ಯಾಂಶಗಳು

  • ರಾಜ್ಯದಲ್ಲಿ ಹಾಫ್ ಹೆಲ್ಮೆಟ್ ನಿಷೇಧಕ್ಕೆ ಸರ್ಕಾರ ಚಿಂತನೆ
  • ಫುಟ್​ಪಾತ್​ ಮೇಲೆ ಬೈಕ್​ ಓಡಿಸಿದ್ರೆ ವಿಧಿಸಲಾಗುವ ದಂಡ ಹೆಚ್ಚಳಕ್ಕೆ ಪ್ರಸ್ತಾವನೆ
  • ವಿಧಾನಸೌಧದಲ್ಲಿ ಮಾಹಿತಿ ನೀಡಿದ ಸಾರಿಗೆ ಸಚಿವ ಭೈರತಿ ಸುರೇಶ್

ಬೆಂಗಳೂರು, ಸೆಪ್ಟೆಂಬರ್​​ 30: ರಾಜ್ಯದಲ್ಲಿ ರಸ್ತೆ ಸುರಕ್ಷತೆಯನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಮತ್ವದ ನಿರ್ಧಾರಕ್ಕೆ ಮುಂದಾಗಿದೆ. ದ್ವಿಚಕ್ರ ವಾಹನ ಸವಾರರ ಜೀವಕ್ಕೆ ಕಂಟಕವಾಗುತ್ತಿರುವ ‘ಹಾಫ್ ಹೆಲ್ಮೆಟ್’ ಉತ್ಪಾದನೆ ಹಾಗೂ ಮಾರಾಟಕ್ಕೆ ಕಡಿವಾಣ ಹಾಕುವುದಕ್ಕೆ ಚಿಂತನೆ ನಡೆಸುತ್ತಿರುವುದಾಗಿ ಸಾರಿಗೆ ಸಚಿವ ಭೈರತಿ ಸುರೇಶ್ ಹೇಳಿದ್ದಾರೆ.

ಹಾಫ್ ಹೆಲ್ಮೆಟ್ ಬ್ಯಾನ್​​ಗೆ ಚಿಂತನೆ: ಉತ್ಪಾದಕರು, ಮಾರಾಟಗಾರರ ವಿರುದ್ಧ ಕಠಿಣ ಕ್ರಮ

ವಿಧಾನಸೌಧದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಸಾರಿಗೆ ಸಚಿವ ಭೈರತಿ ಸುರೇಶ್, ‘ಹಾಫ್ ಹೆಲ್ಮೆಟ್ ಬ್ಯಾನ್ ಮಾಡಲು ನಿಯಮಗಳಲ್ಲಿ ಅವಕಾಶ ಇದೆಯೇ ಚೆಕ್ ಮಾಡುತ್ತಿದ್ದೇವೆ. ಆದರೆ ಅದರ ಉತ್ಪಾದನೆ ಕಡಿಮೆ ಮಾಡುವುದು ಸಾಧ್ಯನಾ ಎಂದು ಕೂಡ ಪರಿಶೀಲನೆ ಮಾಡುತ್ತಿದ್ದೇವೆ. ಹಾಫ್ ಹೆಲ್ಮೆಟ್ ಪ್ರಮಾಣ ಕಡಿಮೆ ಮಾಡಬೇಕಿದೆ. ಅದರ ಬ್ಯಾನ್ ಬಗ್ಗೆ ನಿಯಮಗಳನ್ನು ನೋಡಿಕೊಂಡು ಮಾಡಬೇಕಿದೆ. ನಗರದಲ್ಲಿ ಅರೆ ಹೆಲ್ಮೆಟ್‌ಗಳನ್ನು ಧರಿಸಿ ದ್ವಿಚಕ್ರ ವಾಹನ ಚಲಾಯಿಸುವವರ ಸಂಖ್ಯೆ ಹೆಚ್ಚುತ್ತಿದೆ. ಇಂತಹ ಹೆಲ್ಮೆಟ್‌ಗಳ ಉತ್ಪಾದನೆ ಹಾಗೂ ಮಾರಾಟದ ಮೇಲೆಯೂ ಕಟ್ಟುನಿಟ್ಟಿನ ಕ್ರಮಕೈಗೊಳ್ಳಬೇಕು’ ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಹಣಕಾಸಿನ ಬಿಕ್ಕಟ್ಟಿನಲ್ಲಿ ರಾಜ್ಯದ 4 ರಸ್ತೆ ಸಾರಿಗೆ ನಿಗಮಗಳು: 8,000 ಕೋಟಿ ರೂ. ನಷ್ಟವೆಂದ ಸಚಿವ ಭೈರತಿ ಸುರೇಶ್!

‘ರಸ್ತೆ ಸುರಕ್ಷತಾ ಮಾನದಂಡಗಳಿಗೆ ಅನುಗುಣವಾಗಿ ಇಲ್ಲದ ಹಾಫ್ ಹೆಲ್ಮೆಟ್‌ಗಳ ಉತ್ಪಾದನೆಯನ್ನೇ ನಿಷೇಧಿಸುವುದು, ಇಂತಹ ಹೆಲ್ಮೆಟ್‌ಗಳನ್ನು ತಯಾರಿಸುವ ಉತ್ಪಾದಕರು ಹಾಗೂ ಮಾರಾಟಗಾರರ ವಿರುದ್ಧ ಕ್ರಮ ಕೈಗೊಳ್ಳುವ ಬಗ್ಗೆ ಚರ್ಚೆ ಮಾಡಿದ್ದೇವೆ. ಹಾಫ್ ಹೆಲ್ಮೆಟ್ ಅಗತ್ಯ ನಿಯಂತ್ರಣ ಕ್ರಮಗಳನ್ನು ಜಾರಿಗೊಳಿಸುವ ಕುರಿತು ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿದ್ದೇವೆ’ ಎಂದು ಸಚಿವ ಭೈರತಿ ಸುರೇಶ್​ ಹೇಳಿದ್ದಾರೆ.

ಫುಟ್‌ಪಾತ್ ಮೇಲೆ ಬೈಕ್ ಓಡಿಸಿದರೆ 5 ಸಾವಿರ ದಿಂದ 10 ಸಾವಿರ ರೂ ದಂಡ!

ಮತ್ತೊಂದೆಡೆ, ಪಾದಚಾರಿಗಳಿಗೆ ಮೀಸಲಾದ ಫುಟ್‌ಪಾತ್‌ಗಳ ಮೇಲೆ ದ್ವಿಚಕ್ರ ವಾಹನಗಳನ್ನು ಓಡಿಸುವ ಸವಾರರಿಗೆ ಬಿಸಿ ಮುಟ್ಟಿಸಲು ಸಾರಿಗೆ ಮತ್ತು ಗೃಹ ಇಲಾಖೆ ಜಂಟಿಯಾಗಿ ದಂಡದ ಮೊತ್ತವನ್ನು ಭಾರಿ ಪ್ರಮಾಣದಲ್ಲಿ ಹೆಚ್ಚಿಸಲು ಮುಂದಾಗಿವೆ. ಪ್ರಸ್ತುತ ಫುಟ್‌ಪಾತ್ ರೈಡಿಂಗ್‌ಗೆ 500 ರೂ ದಂಡವಿದ್ದು, ಇದನ್ನು ಮೊದಲ ಬಾರಿಯ ಉಲ್ಲಂಘನೆಗೆ ಬರೋಬ್ಬರಿ 5,000 ರೂ ಹಾಗೂ ಎರಡನೇ ಬಾರಿಯೂ ಪುನರಾವರ್ತಿಸಿದರೆ 10,000 ರೂ.ಗೆ ಏರಿಕೆ ಮಾಡಲು ರಾಜ್ಯ ಸರ್ಕಾರಕ್ಕೆ ಅಧಿಕೃತ ಪ್ರಸ್ತಾವನೆ ಸಲ್ಲಿಸಲಾಗಿದೆ.

ಕಾನೂನು ಇಲಾಖೆಯ ಸಮ್ಮತಿ ಬಳಿಕ ಅಂತಿಮ ಆದೇಶ

ಫುಟ್‌ಪಾತ್ ಬೈಕ್ ಸವಾರರ ಮೇಲಿನ ದಂಡ ಹೆಚ್ಚಳದ ಪ್ರಸ್ತಾವನೆ ಇನ್ನೂ ಅಂತಿಮವಾಗಿ ಜಾರಿಗೆ ಬಂದಿಲ್ಲ. ಈ ಪ್ರಸ್ತಾವನೆಗೆ ಸಂಬಂಧಿಸಿದಂತೆ ಸದ್ಯ ಕಾನೂನು ಇಲಾಖೆಯ ಅಭಿಪ್ರಾಯ ಮತ್ತು ಸಲಹೆಗಳನ್ನು ಕೋರಲಾಗಿದ್ದು, ಕಾನೂನು ಇಲಾಖೆಯ ಒಪ್ಪಿಗೆ ಸಿಕ್ಕ ಬಳಿಕ ರಾಜ್ಯ ಸರ್ಕಾರ ಅಧಿಕೃತ ಆದೇಶ ಹೊರಡಿಸಲಿದೆ.

Minister Byrathi Suresh Announced Plans To Ban The Manufacture And Sale Of Half Helmets

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 9:29 pm, Wed, 30 September 26

ಪ್ರಸನ್ನ ಗಾಂವ್ಕರ್​

ಹುಟ್ಟೂರು ಯಲ್ಲಾಪುರ, ಬೆಳೆದೂರು ದಾಂಡೇಲಿಯ ದಟ್ಟ ಕಾಡುಗಳ ನಡುವೆ. ರವಿ ಬೆಳಗೆರೆ ಎಂಬ ಅಕ್ಷರ ರಾಕ್ಷಸನ ಕಟ್ಟಾಭಿಮಾನದಿಂದ ಹಾಳಾಗಿ, ಸೈನ್ಸ್ ನಲ್ಲಿ ಡಿಗ್ರಿ ಪಡೆದು ಜರ್ನಲಿಸಂಗೆ ಹಿಂಬದಿ ಕಿಟಕಿಯಿಂದ ನುಸುಳಿದ್ದು 2010 ರ ಅಕ್ಟೋಬರ್ ನಲ್ಲಿ. ಉಡುಪಿಯಲ್ಲಿ ಮೊದಲ ಪತ್ರಿಕೋದ್ಯಮ ಕರ್ತವ್ಯ ಪ್ರಾರಂಭಿಸಿದ್ದು 2010 ರಲ್ಲಿಯೇ. ಜನಶ್ರೀ ನ್ಯೂಸ್ ಮೊದಲು ಅನ್ನ ನೀಡಿದ ಸಂಸ್ಥೆ. ಉಡುಪಿ ಜಿಲ್ಲಾ ವರದಿಗಾರನಾಗಿ ಮೂರು ವರ್ಷ ಕೆಲಸ ಮಾಡಿ 2013 ರ ಅಂತ್ಯಕ್ಕೆ ಸಮಯ ನ್ಯೂಸ್ ಮೂಲಕ ಬೆಂಗಳೂರಿಗೆ ಎಂಟ್ರಿ. ಬಿಗ್ ೩, ಬೆಂಗಳೂರ್ ಲೈವ್, ಸಮಯ ಸಕಾಲ ಕಾರ್ಯಕ್ರಮದಲ್ಲಿ ವರದಿಗಾರಿಕೆ ಮಾಡಿದ ಖುಷಿ. 2014 ರ ಡಿಸೆಂಬರ್ ನಿಂದ ಟಿವಿ9 ನಲ್ಲಿ ಕೆಲಸ ಪ್ರಾರಂಭ. ಟಿವಿ9 ನಲ್ಲಿ ಮೊದಲು ಮೆಟ್ರೋ ರಿಪೋರ್ಟಿಂಗ್ ಮೂಲಕ ಬೆಂಗಳೂರು ಸುತ್ತುವ ಅರಿಯುವ ರಾಜಧಾನಿಯ ನಾಡಿಮಿಡಿತ ಹುಡುಕುವ ಅವಕಾಶ. ಮೆಟ್ರೋ ಬ್ಯೂರೋ ದಲ್ಲಿ ಶೈಕ್ಷಣಿಕ ಹಾಗೂ ಬಿಬಿಎಂಪಿ ವರದಿಗಾರಿಕೆ. ಚಪ್ಪಲಿಯಿಂದ ಹಿಡಿದು ಚಾದರ್ ತನಕ ಸ್ಟೋರಿ ಮಾಡಿದ ಅನುಭವ. ಮೆಟ್ರೋ ಟೀಂ ನಿಂದ ರಾಜಕೀಯ ವರದಿಗಾರಿಕೆಗೆ ಶಿಫ್ಟ್ ಆದ ತಕ್ಷಣ- ಮುಂದುವರಿದಿದೆ ನಿರಂತರ ಪಯಣ. ಕಥೆ, ಕಾದಂಬರಿ, ಕವನ, ಸಿನಿಮಾ, ಸುತ್ತಾಟ, ಆಗಾಗ ಕಿತ್ತಾಟ, ಸ್ನೇಹಿತರೊಂದಿಗೆ ಒಡನಾಟ ಇವೆಲ್ಲ ಮಾಮೂಲಿ ದಿನಚರಿ. ಇವತ್ತಿಗೂ ಬರವಣಿಗೆಯೊಂದೇ ಖುಷಿ ಕೊಡುವ ಖರ್ಜೂರ. ಸ್ಟಾಕ್ ಮಾರ್ಕೆಟ್ ನಲ್ಲಿ 2019 ರಿಂದ ಆ್ಯಕ್ಟಿವ್.

Read More
Loading...
Unable to load recommendations.
Follow Us