ಮುಂದುವರಿದ ಮಳೆಯ ಅಬ್ಬರ: ಇಂದು ಈ ಜಿಲ್ಲೆಗಳಲ್ಲಿ ಶಾಲಾ ಕಾಲೇಜುಗಳಿಗೆ ರಜೆ
ಕರ್ನಾಟಕದಲ್ಲಿ ಮಳೆಯ ಅಬ್ಬರ ಜೋರಾಗಿದ್ದು, ಕೆಲವು ಜಿಲ್ಲೆಗಳಲ್ಲಿ ಸಾಲು ಸಾಲು ಅವಾಂತರಗಳೇ ಸೃಷ್ಟಿಯಾಗುತ್ತಿವೆ. ಮಳೆಹಾನಿ ಪ್ರದೇಶಗಳಲ್ಲಿ ಜನರ ಒದ್ದಾಟ ಹೇಳತೀರದಾಗಿದೆ. ಮಲೆನಾಡಿನಲ್ಲಿ ಮಳೆ ಅಬ್ಬರಕ್ಕೆ ಬೃಹತ್ ಮರಗಳು ಧರೆಗುರುಳಿವೆ. ಭಾರಿ ಮಳೆಯ ಕಾರಣ ಮುನ್ನೆಚ್ಚರಿಕಾ ಕ್ರಮವಾಗಿ ಕೆಲವು ಜಿಲ್ಲೆಗಳಲ್ಲಿ ಶಾಲಾ ಕಾಲೇಜಿಗಳಿಗೆ ರಜೆ ನೀಡಲಾಗಿದೆ. ಅವುಗಳ ವಿವರ ಇಲ್ಲಿದೆ.

ಬೆಂಗಳೂರು, ಜುಲೈ 3: ಚಿಕ್ಕಮಗಳೂರು, ಉತ್ತರ ಕನ್ನಡ, ಕೊಡಗು, ದಕ್ಷಿಣ ಕನ್ನಡ ಸೇರಿದಂತೆ ಕರ್ನಾಟಕದ ವಿವಿಧ ಕಡೆಗಳಲ್ಲಿ ಮಳೆಯ (Monsoon Rain) ಅಬ್ಬರ ಜೋರಾಗಿದೆ. ಭಾರಿ ಮಳೆಯಿಂದಾಗಿ ಹಲವೆಡೆ ಅವಾಂತರಗಳೇ ಸೃಷ್ಟಿಯಾಗಿವೆ. ಚಿಕ್ಕಮಗಳೂರು (Chikmagalur) ಜಿಲ್ಲೆಯ ಮಲೆನಾಡು ಭಾಗದಲ್ಲಿ ಧಾರಾಕಾರ ಮಳೆ ಸುರಿಯುತ್ತಿದೆ. ಪಶ್ಚಿಮ ಘಟ್ಟಗಳ ಸಾಲಿನಲ್ಲಿ ಭಾರಿ ವರ್ಷಧಾರೆಯಾಗಿದ್ದು, ರಾಷ್ಟ್ರೀಯ ಹೆದ್ದಾರಿಗೆ ಅಡ್ಡಲಾಗಿಯೇ ಬೃಹತ್ ಮರ ಬಿದ್ದಿದೆ. ಶೃಂಗೇರಿ ತಾಲೂಕಿನ ಕೆರೆಕಟ್ಟೆ ಬಳಿ ರಾಷ್ಟ್ರೀಯ ಹೆದ್ದಾರಿ 169ರಲ್ಲಿ ಬುಧವಾರ ಕಿಲೋಮೀಟರ್ಗಟ್ಟಲೇ ಟ್ರಾಫಿಕ್ ಜಾಮ್ ಉಂಟಾಗಿತ್ತು. ವಾಹನಗಳು ನಿಂತಲ್ಲೇ ನಿಂತು ಸವಾರರು ಪರದಾಟ ಪಡುವಂತಾಯಿತು.
ಚಿಕ್ಕಮಗಳೂರು: ಅಂಗನವಾಡಿ, ಪ್ರಾಥಮಿಕ, ಪ್ರೌಢ ಶಾಲೆಗಳಿಗೆ ರಜೆ
ಚಿಕ್ಕಮಗಳೂರು, ಕೊಪ್ಪ, ಶೃಂಗೇರಿ, ಮೂಡಿಗೆರೆ, ಕಳಸ, ಎನ್ಆರ್ ಪುರ, ಮೂಡಿಗೆರೆ ತಾಲೂಕಿನ ಚಾರ್ಮಾಡಿ ಘಾಟ್, ಕೊಟ್ಟಿಗೆಹಾರದಲ್ಲಿ ಬಿರುಗಾಳಿ ಸಹಿತ ಧಾರಾಕಾರ ಮಳೆಯಾಗಿದೆ. ಕಳಸ, ಮೂಡಿಗೆರೆ, ಶೃಂಗೇರಿ, ಕೊಪ್ಪ, ಎನ್.ಆರ್.ಪುರ ತಾಲೂಕಿನಾದ್ಯಂತ ಮಳೆಯಾದ ಪರಿಣಾಮ ಅಂಗನವಾಡಿ, ಪ್ರಾಥಮಿಕ, ಪ್ರೌಢ ಶಾಲೆಗಳಿಗೆ ಇಂದು ರಜೆ ಘೋಷಿಸಲಾಗಿದೆ.
ಶೃಂಗೇರಿ ತಾಲೂಕಿನ ಸುಂಕದಮಕ್ಕಿ ಶಿಥಿಲಾವಸ್ಥೆಯ ಕಾಲುಸಂಕದ ಮೇಲೆಯೇ ಜನರ ಓಡಾಟ ನಡೆಸುತ್ತಿದ್ದಾರೆ. ಧಾರಾಕಾರ ಮಳೆಗೆ ತುಂಗಾ ನದಿ ಉಕ್ಕಿ ಹರಿಯುತ್ತಿದ್ದು, ಪ್ರತಿದಿನವೂ ಸುಮಾರು 7-8 ಗ್ರಾಮಸ್ಥರು ಓಡಾಡುತ್ತಿದ್ದಾರೆ. ಸ್ಪಂದಿಸದ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಉತ್ತರ ಕನ್ನಡ ಜಿಲ್ಲೆಯಲ್ಲೂ ಶಾಲೆಗಳಿಗೆ ರಜೆ
ಉತ್ತರ ಕನ್ನಡ ಜಿಲ್ಲೆಯಲ್ಲಿ ಮಳೆ ಜೋರಾಗಿದ್ದು, ದಾಂಡೇಲಿ ಮತ್ತು ಜೋಯಿಡಾ ತಾಲೂಕಿನ ಅಂಗನವಾಡಿ, ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಿಗೆ ರಜೆ ಘೋಷಿಸಲಾಗಿದೆ.
ಕೊಡಗು ಜಿಲ್ಲೆಯಲ್ಲೂ ಶಾಲಾ ಕಾಲೇಜಿಗೆ ರಜೆ
ಕೊಡಗು ಜಿಲ್ಲೆಯಲ್ಲಿ ಇಂದು ಆರೆಂಜ್ ಅಲರ್ಟ್ ನೀಡಲಾಗಿದೆ. ಹೀಗಾಗಿ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಿ ಜಿಲ್ಲಾಧಿಕಾರಿ ವೆಂಕಟರಾಜಾ ಆದೇಶ ಹೊರಡಿಸಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆಯ ಕೆಲವೆಡೆ ಶಾಲೆ ಕಾಲೇಜು ರಜೆ
ದಕ್ಷಿಣ ಕನ್ನಡ ಜಿಲ್ಲೆಯ ಗ್ರಾಮಾಂತರ ಭಾಗ ಹಾಗೂ ಘಟ್ಟ ಪ್ರದೇಶದಲ್ಲಿ ಭಾರೀ ಮಳೆಯಾಗುತ್ತಿರುವ ಕಾರಣ ಸುಳ್ಯ, ಕಡಬ ತಾಲೂಕಿನ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಅಂಗನವಾಡಿಯಿಂದ ಪದವಿಪೂರ್ವ ಕಾಲೇಜುಗಳವರೆಗೆ ರಜೆ ಘೋಷಿಸಲಾಗಿದೆ.
ಶಿವಮೊಗ್ಗ ಜಿಲ್ಲೆಯಲ್ಲಿಯೂ ಶಾಲೆ ಕಾಲೇಜಿಗೆ ರಜೆ
ಶಿವಮೊಗ್ಗ ಜಿಲ್ಲೆಯ ಹೊಸನಗರ, ತೀರ್ಥಹಳ್ಳಿ ತಾಲೂಕಿನಲ್ಲಿ ಭಾರಿ ಮಳೆಯಾಗುತ್ತಿದ್ದು, ಹೊಸನಗರ ತಾಲೂಕಿನ ಅಂಗನವಾಡಿಗಳು, ಪ್ರಾಥಮಿಕ ಶಾಲೆಗಳು, ಪ್ರೌಢಶಾಲೆ, ಪದವಿ ಪೂರ್ವ ಕಾಲೇಜುಗಳಿಗೆ ಇಂದು ರಜೆ ಘೋಷಣೆ ಮಾಡಿ ಹೊಸನಗರ ತಹಶೀಲ್ದಾರ್ ರಶ್ಮಿ ಹಾಲೇಶ್ ಆದೇಶಿಸಿದ್ದಾರೆ.
ಇದನ್ನೂ ಓದಿ: ಬೆಂಗಳೂರಿನಲ್ಲಿ ಟನಲ್ ರಸ್ತೆ, ವಾಹನ ಸವಾರರಿಗೆ ದುಬಾರಿ ಟೋಲ್ ಬರೆ!
ಮತ್ತೊಂದೆಡೆ, ಚಿಕ್ಕಬಳ್ಳಾಪುರದ ನಂದಿಗಿರಿಧಾಮದಲ್ಲಿ ಸಂಪುಟ ಸಭೆ ಮುಗಿಯುತ್ತಿದ್ದಂತೆ ಧಾರಾಕಾರ ಮಳೆಯಾಗಿದೆ. ಬಂದೋಬಸ್ತ್ಗೆ ಬಂದಿದ್ದ ಪೊಲೀಸರು ಮಳೆಯಿಂದ ಆಶ್ರಯ ಪಡೆಯಲು ಪರದಾಡಿದರು. ಸಂಪುಟ ಸಭೆ ಬಳಿಕ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಮಳೆಹಾನಿ ಪ್ರದೇಶಗಳಿಗೆ ಭೇಟಿ ನೀಡುವುದಾಗಿ ಭರವಸೆ ನೀಡಿದರು.
ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 6:45 am, Thu, 3 July 25