
ಬೆಂಗಳೂರು, (ಮೇ 21): ಕರ್ನಾಟಕದಾದ್ಯಂತ ಇಂದಿನಿಂದ 4 ದಿನಗಳ ಕಾಲ ಭಾರೀ ಮಳೆಯಾಗುವ (karnataka Rains) ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ. ಮುಂಗಾರು ಪೂರ್ವ (pre monsoon) ಮಾರುಗಳ ತೀವ್ರತೆ ಹೆಚ್ಚಾಗಿರುವುದರಿಂದ ಗುಡುಗು, ಮಿಂಚು ಹಾಗೂ ಬಿರುಗಾಳಿ ಸಹಿತ ಭಾರೀ ಮಳೆಯಾಗುವ ಸಂಭವವಿದೆ. ಈ ಹಿನ್ನೆಲೆಯಲ್ಲಿ ಬೆಂಗಳೂರು (Bengaluru), ಕರಾವಳಿ ಹಾಗೂ ಮಲೆನಾಡು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ (Yellow Alert) ಘೋಷಿಸಲಾಗಿದೆ.
ಮುಖ್ಯಾಂಶಗಳು
ಬೆಂಗಳೂರಿನಲ್ಲಿ ಇಂದು (ಮೇ 21) ಆರೆಂಜ್ ಹಾಗೂ ಮುಂದಿನ 3 ದಿನ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಇನ್ನು ಬೆಂಗಳೂರು ನಗರ ಮಾತ್ರವಲ್ಲದೇ ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ತುಮಕೂರು, ರಾಯಚೂರು, ಯಾದಗಿರಿ, ಕಲಬುರಗಿ, ಬೀದರ್ ಜಿಲ್ಲೆಗಳಿಗೆ ಇಂದು ಆರೆಂಜ್ ಅಲರ್ಟ್, ಇನ್ನುಳಿದ 19 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ವಿಜಯಪುರ, ಬಾಗಲಕೋಟೆ, ಕೊಪ್ಪಳ ಹಾಗೂ ಗದಗ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ವರದಿ ಮಾಡಿದೆ.
ಮೇ 22 ರಂದು ಬೀದರ್, ಕಲಬುರಗಿ, ಯಾದಗಿರಿ, ರಾಯಚೂರು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಮತ್ತು 17 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್, ಮೇ 23ರಂದು ಬೀದರ್ ಹಾಗೂ ಕಲಬುರಗಿ ಎರಡು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಹಾಗೂ ಬೆಂಗಳೂರು ಸೇರಿದಂತೆ ದಕ್ಷಿಣ ಹಾಗೂ ಉತ್ತರ ಒಳನಾಡಿನ 19 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಬಂಗಾಳಕೊಲ್ಲಿ, ಅರಬ್ಬೀ ಸಮುದ್ರದ ವಿವಿಧ ಭಾಗಗಳಲ್ಲಿ ಬಿರುಗಾಳಿ ಹಿನ್ನೆಲೆಯಲ್ಲಿ ಕಡಲಿಗೆ ಇಳಿಯದಂತೆ ಕರಾವಳಿ ಮೀನುಗಾರರಿಗೆ ಮುನ್ನೆಚ್ಚರಿಕೆ ನೀಡಲಾಗಿದೆ. 40 ರಿಂದ 50 ಕಿಲೋ ಮೀಟರ್ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇದೆ. ಕೆಲವೆಡೆ ಗಂಟೆಗೆ 60 ಕಿ.ಮೀ. ವೇಗದಲ್ಲಿ ಗಾಳಿ ಬೀಸಬಹುದು. ಹೀಗಾಗಿ ಈಗಾಗಲೇ ಕಡಲಿಗೆ ಇಳಿದವರು ತಕ್ಷಣ ತೀರ ಪ್ರದೇಶ ಸೇರಬೇಕೆಂದು ಸೂಚನೆ ನೀಡಲಾಗಿದೆ. ಇದರಿಂದ ಮೀನುಗಾರಿಕೆಗೆ ತೆರಳಿದ್ದ ಬೋಟ್ಗಳು ಮಲ್ಪೆ ಹಿನ್ನೀರು ಪರಿಸರದಲ್ಲಿ ವಾಪಸ್ ಆಗುತ್ತಿವೆ.