ಬೆಂಗಳೂರು: ನೈರುತ್ಯ ಮುಂಗಾರು ಮತ್ತಷ್ಟು ಚುರುಕಾಗಿರುವ ಹಿನ್ನೆಲೆ ರಾಜ್ಯದಲ್ಲಿ ಮುಂದಿನ 48 ಗಂಟೆ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಆಗಸ್ಟ್ 2ರವರೆಗೂ ರಾಜ್ಯದಲ್ಲಿ ಹೆಚ್ಚು ಮಳೆಯಾಗಲಿದ್ದು, ಕರಾವಳಿ, ದಕ್ಷಿಣ ಒಳನಾಡು, ಉತ್ತರ ಒಳನಾಡಿನಲ್ಲಿ ಭಾರಿ ಮಳೆಯಾಗಲಿದೆ. ಮುಂದಿನ 48 ಗಂಟೆ ಗುಡುಗು ಮಿಶ್ರಿತ ಮಳೆಯಾಗುವ ಸಾಧ್ಯತೆ ಇದ್ದು, ಬಿರುಗಾಳಿ ವೇಗ ಪ್ರತಿ ಗಂಟೆಗೆ 40-50 ಕಿ.ಮೀ. ತಲುಪುವ ಸಾಧ್ಯತೆ ಇದೆ ಎಂದು ಮೂನ್ಸೂಚನೆ ನೀಡಿದೆ.
ಈ ಸಂಬಂಧ ಮುನ್ನೆಚ್ಚರಿಕೆ ಕ್ರಮವಾಗಿ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚನೆ ನೀಡಲಾಗಿದೆ. ಬೆಂಗಳೂರು ನಗರದಲ್ಲಿ ಇನ್ನೂ ಎರಡು ದಿನ ಭಾರಿ ಮಳೆಯಾಗಲಿದ್ದು, ನಗರದಲ್ಲಿ ಗರಿಷ್ಠ ಉಷ್ಣಾಂಶ 30 ಮತ್ತು ಕನಿಷ್ಠ ಉಷ್ಣಾಂಶ 20 ಡಿಗ್ರಿ ಸೆಲ್ಸಿಯಸ್ ಇದೆ. ತಗ್ಗು ಪ್ರದೇಶ ಹಾಗೂ ರಾಜಾಕಾಲುವೆ ಅಕ್ಕಪಕ್ಕದಲ್ಲಿ ವಾಸಿಸುವ ಜನರು ಎಚ್ಚರಿಕೆಯಿಂದ ಇರಲು ಹವಮಾನ ಇಲಾಖೆ ಸೂಚನೆ ನೀಡಿದೆ.