ಕರ್ನಾಟಕದಲ್ಲಿ ಭಾರಿ ಮಳೆ ಮುನ್ಸೂಚನೆ: ವಿವಿಧ ಜಿಲ್ಲೆಗಳಲ್ಲಿ ಶಾಲಾ-ಕಾಲೇಜುಗಳಿಗೆ ರಜೆ
ಕರ್ನಾಟಕದಾದ್ಯಂತ ಭಾರಿ ಮಳೆಯಾಗುತ್ತಿದ್ದು, ಧಾರವಾಡ, ಕೊಡಗು, ಉಡುಪಿ ಮತ್ತು ಚಿಕ್ಕಮಗಳೂರು ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ. ನಿರಂತರ ಮಳೆಯಿಂದಾಗಿ ಹಲವು ಕಡೆಗಳಲ್ಲಿ ನೀರು ನುಗ್ಗಿದೆ. ಶಾಲೆ ಮತ್ತು ಕಾಲೇಜುಗಳಿಗೆ ರಜೆ ಘೋಷಿಸಲಾಗಿದ್ದು, ಜನರು ಎಚ್ಚರಿಕೆಯಿಂದ ಇರುವಂತೆ ಸೂಚಿಸಲಾಗಿದೆ. ಹವಾಮಾನ ಇಲಾಖೆ ಜೂನ್ 17 ರವರೆಗೆ ಮಳೆಯ ಮುನ್ಸೂಚನೆ ನೀಡಿದೆ.

ಧಾರವಾಡ/ಕೊಡಗು, ಜೂನ್ 12: ಕರ್ನಾಟಕದಾದ್ಯಂತ ಮುಂಗಾರು ಮಳೆ (Monsoon Rain) ಆರ್ಭಟ ಜೋರಾಗಿದೆ. ನಿರಂತರ ಮಳೆಯಿಂದಾಗಿ ತಗ್ಗುಪ್ರದೇಶಗಳಲ್ಲಿನ ಮನೆಗಳಿಗೆ ನೀರು ನುಗ್ಗಿದ್ದು, ಸಾಕಷ್ಟು ಅವಾಂತರ ಸೃಷ್ಟಿಯಾಗಿದೆ. ಮಳೆ ಹಿನ್ನೆಲೆಯಲ್ಲಿ ಧಾರವಾಡ (Dharwad), ಉಡುಪಿ (Udupi), ಕೊಡುಗು ಮತ್ತು ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಅಂಗನವಾಡಿ, ಶಾಲೆ, ಕಾಲೇಜುಗಳಿಗೆ ಜಿಲ್ಲಾಡಳಿತಗಳು ರಜೆ ಘೋಷಿಸಿವೆ. ಧಾರವಾಡ ಜಿಲ್ಲೆಯಲ್ಲಿ ಮಳೆ ಮುಂದುವರಿದ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ಶುಕ್ರವಾರ (ಜೂ.13) ಶಾಲಾ-ಕಾಲೇಜುಗಳಿಗೆ ರಜೆ (School-Colleges Holiday) ಘೋಷಿಸಿದೆ. ಪ್ರಾಥಮಿಕ, ಪ್ರೌಢ ಶಾಲೆ, ಪಿಯುಸಿ ಮತ್ತು ಪದವಿ ಕಾಲೇಜುಗಳಿಗೆ ರಜೆ ನೀಡಿ ಜಿಲ್ಲಾಧಿಕಾರಿ ದಿವ್ಯಪ್ರಭು ಆದೇಶ ಹೊರಡಿಸಿದ್ದು, ರೆಡ್ ಅಲರ್ಟ್ ಘೋಷಿಸಿದ್ದಾರೆ.
ಕೊಡಗಿನಲ್ಲೂ ಶಾಲಾ-ಕಾಲೇಜುಗಳಿಗೆ ರಜೆ
ಭಾರಿ ಮಳೆ ಮುಂದುವರೆದ ಹಿನ್ನೆಲೆಯಲ್ಲಿ ಕೊಡಗು ಜಿಲ್ಲೆಯಲ್ಲಿ ನಾಳೆ (ಜೂ.12) ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ಈ ಹಿನ್ನೆಲೆಯಲ್ಲಿ ಅಂಗನವಾಡಿ, ಪ್ರಾಥಮಿಕ, ಪ್ರೌಢ ಶಾಲೆ, ಪದವಿಪೂರ್ವ ಕಾಲೇಜುಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ವೆಂಜಟರಾಜಾ ಆದೇಶ ಹೊರಡಿಸಿದ್ದಾರೆ. ನದಿ ತೀರ, ಬೆಟ್ಟ-ಗುಡ್ಡ, ತಗ್ಗುಪ್ರದೇಶಗಳಲ್ಲಿ ವಾಸಮಾಡುವವರು ಎಚ್ಚರಿಕೆಯಿಂದ ಇರುವಂತೆ ಸೂಚನೆ ನೀಡಿದ್ದಾರೆ.
ಉಡುಪಿ ಜಿಲ್ಲೆಗೆ ರೆಡ್ ಅಲರ್ಟ್, ಶಾಲೆ ರಜೆ
ಉಡುಪಿ ಜಿಲ್ಲೆಯಲ್ಲಿ ಭಾರಿ ಮಳೆಯಾಗುವ ಮುನ್ಸೂಚನೆ ನೀಡಿರುವ ಹಿನ್ನೆಲೆಯಲ್ಲಿ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ಹೀಗಾಗಿ ಜಿಲ್ಲೆಯಲ್ಲಿನ ಅಂಗನವಾಡಿ ಹಾಗೂ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಿಗೆ ಶುಕ್ರವಾರ ಜಿಲ್ಲಾಧಿಕಾರಿ ಡಾ.ವಿದ್ಯಾಕುಮಾರಿ ರಜೆ ಘೋಷಿಸಿದ್ದಾರೆ.
ಚಿಕ್ಕಮಗಳೂರು ಅಂಗನವಾಡಿ ಕೇಂದ್ರಗಳಿಗೆ ರಜೆ
ಚಿಕ್ಕಮಗಳೂರು ಜಿಲ್ಲೆಯಾದ್ಯಂತ ಎರಡು ದಿನಗಳ ಕಾಲ ರೆಡ್ ಅಲರ್ಟ್ ಘೋಷಿಸಲಾಗಿದೆ. ಈ ಹಿನ್ನೆಲೆಯಲ್ಲಿ ಅಂಗನವಾಡಿ ಕೇಂದ್ರಗಳಿಗೆ ಎರಡು ದಿನ ರಜೆ ಘೋಷಣೆ ಮಾಡಲಾಗಿದೆ. ಚಿಕ್ಕಮಗಳೂರು ಜಿಲ್ಲೆಯ ಮಲೆನಾಡು ಭಾಗದ ಚಿಕ್ಕಮಗಳೂರು, ಮೂಡಿಗೆರೆ ,ಕಳಸ ,ಕೊಪ್ಪ, ಶೃಂಗೇರಿ, NR ಪುರ ತಾಲೂಕಿನ ಅಂಗನವಾಡಿ ಕೇಂದ್ರಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಮೀನಾ ನಾಗರಾಜ್ ಅವರು ಆದೇಶ ಹೊರಡಿಸಿದ್ದಾರೆ.
ಇದನ್ನೂ ಓದಿ: ಕರ್ನಾಟಕದಲ್ಲಿ ಜೂನ್ 13ರಿಂದ ಮಳೆ ಜೋರು, ಈ 9 ಜಿಲ್ಲೆಗಳಿಗೆ ರೆಡ್ ಅಲರ್ಟ್
ಜೂನ್ 17ರವರೆಗೆ ವ್ಯಾಪಕ ಮಳೆ
ರಾಜ್ಯಾದ್ಯಂತ ಜೂ.17ರವರೆಗೆ ವ್ಯಾಪಕ ಮಳೆಯಾಗುವ ಸಾಧ್ಯತೆ ಇದ್ದು, ಕರಾವಳಿ, ಮಲೆನಾಡು, ಉತ್ತರ ಕರ್ನಾಟಕದ ಹಲವು ಜಿಲ್ಲೆಗಳಿಗೆ ಹವಾಮಾನ ಇಲಾಖೆ ರೆಡ್ ಅಲರ್ಟ್ ನೀಡಿದೆ. ಭಾರಿ ಮಳೆಯಾಗುವ ಮುನ್ಸೂಚನೆ ಇರುವ ಹಿನ್ನೆಲೆಯಲ್ಲಿ ಗದಗ ಜಿಲ್ಲಾಡಳಿತ ಸಾರ್ವಜನಿಕ ಅನಕೂಲಕ್ಕಾಗಿ ಸಾಹಾಯವಾಣಿ ತೆರೆದಿದೆ. ಜೂನ್ 13 ರಿಂದ 14ರವರೆಗೆ ಆರೆಂಜ್ ಅಲರ್ಟ್ ಮತ್ತು ಜೂನ್ 15ರಂದು ಯಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.
ಗುಡುಗು, ಸಿಡಿಲಿನಿಂದಾಗುವ ಘಟನೆ ತಪ್ಪಿಸಲು ಮುಂಜಾಗ್ರತಾ ಕ್ರಮವಾಗಿ ಸುರಕ್ಷಿತ ಸ್ಥಳದಲ್ಲಿ ಆಶ್ರಯ ಪಡೆಯಿರಿ. ಹಳ್ಳ, ನದಿ ತೀರಕ್ಕೆ ಜಾನುವಾರು ತೆಗೆದುಕೊಂಡು ಹೋಗದಂತೆ ಗದಗ ಜಿಲ್ಲಾಧಿಕಾರಿ ಸೂಚನೆ ನೀಡಿದ್ದಾರೆ. ತುರ್ತು ಸಂದರ್ಭದಲ್ಲಿ 08372-239177 ಅಥವಾ 1077 ಸಂಖ್ಯೆಗೆ ಸಂಪರ್ಕಿಸುವಂತೆ ಮನವಿ ಮಾಡಿದ್ದಾರೆ.








