AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮರ್ಯಾದೆಗೇಡು ಹತ್ಯೆ ತಡೆಗೆ ವಿಶೇಷ ಕಾನೂನು: ಸಿದ್ದರಾಮಯ್ಯ ಅಧಿಕೃತ ಘೋಷಣೆ

ಇತ್ತೀಚೆಗೆ ಹುಬ್ಬಳ್ಳಿಯಲ್ಲಿ (Hubballi) ಸ್ವತ ತಂದೆಯೇ ಆರು ತಿಂಗಳ ಗರ್ಭಿಣಿ ಮಗಳನ್ನು ಬರ್ಬರವಾಗಿ ಹತ್ಯೆಗೈದಿದ್ದ ಘಟನೆ ಇಡೀ ರಾಜ್ಯವನ್ನೇ ಬೆಚ್ಚಿಬೀಳಿಸಿತ್ತು. ಈ ಪ್ರಕರಣ ಭಾರಿ ಚರ್ಚೆಗೆ ಗ್ರಾಸವಾಗಿತ್ತು. ಸದ್ಯ ರಾಜ್ಯದಲ್ಲಿ ಮರ್ಯಾದಾ ಹತ್ಯೆ ತಡೆ ಸಂಬಂಧ ಕಟ್ಟುನಿಟ್ಟಿನ ಕಾನೂನು ಜಾರಿಗೆ ತರುವಂತೆ ಆಗ್ರಹಗಳು ವ್ಯಕ್ತವಾಗಿವೆ.ಇದರ ಬೆನ್ನಲ್ಲೇ ಸಿದ್ದರಾಮಯ್ಯ ಸರ್ಕಾರ ಹೊಸ ಕಾನೂನು ಜಾರಿಗೆ ತರಲು ಮುಂದಾಗಿದೆ.

ಮರ್ಯಾದೆಗೇಡು ಹತ್ಯೆ ತಡೆಗೆ ವಿಶೇಷ ಕಾನೂನು: ಸಿದ್ದರಾಮಯ್ಯ ಅಧಿಕೃತ ಘೋಷಣೆ
Siddaramaiah
ರಮೇಶ್ ಬಿ. ಜವಳಗೇರಾ
|

Updated on: Jan 04, 2026 | 8:50 PM

Share

ಬೆಂಗಳೂರು, (ಜನವರಿ 04):  ಹುಬ್ಬಳ್ಳಿಯಲ್ಲಿ (hubballi) ನಡೆದ ಆರು ತಿಂಗಳ ಗರ್ಭಿಣಿಯ ಮರ್ಯಾದಾ ಹತ್ಯೆ (honour killing) ಇಡೀ ರಾಜ್ಯವನ್ನೇ ಬೆಚ್ಚಿಬೀಳಿಸಿದೆ. ಈ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಮರ್ಯಾದಾ ಹತ್ಯೆ ತಡೆಗೆ ಹೊಸ ಕಾನೂನು ಜಾರಿಗೊಳಿಸುವ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah ) ಅಧಿಕೃತವಾಗಿ ಘೋಷಣೆ ಮಾಡಿದ್ದಾರೆ. ಈ ಕುರಿತು ಇಂದು (ಜನವರಿ 4) ಸಾಮಾಜಿಕ ಜಾಲತಾಣಗಳಲ್ಲಿ ಸಿಎಂ ಮಾಹಿತಿ ಹಂಚಿಕೊಂಡಿದ್ದು, ಮರ್ಯಾದೆಗೇಡು ಹತ್ಯೆಯಂತಹ ಘಟನೆಗಳು ಇಡೀ ಮಾನವ ಸಮಾಜ ತಲೆತಗ್ಗಿಸುವಂತಹ ಹೀನ ಕೃತ್ಯಗಳು. ಯಾವುದೇ ಕಾರಣಕ್ಕೂ ನಮ್ಮ ಸರ್ಕಾರ ಇದನ್ನು ಸಹಿಸುವುದಿಲ್ಲ. ಮುಂದೆ ಇಂತಹ ಘಟನೆಗಳಿಗೆ ಕಡಿವಾಣ ಹಾಕುವ ಹಾಗೂ ಜನರಲ್ಲಿ ಕಾನೂನಿನ ಬಗ್ಗೆ ಅರಿವು ಮೂಡಿಸುವ ಉದ್ದೇಶದಿಂದ ವಿಶೇಷ ಕಾನೂನು ರಚನೆ ಮಾಡಲಾಗುವುದು ಎಂದು ಹೇಳಿದ್ದಾರೆ.

ಹುಬ್ಬಳ್ಳಿ ಪ್ರಕರಣದ ವಿಚಾರಣೆಗೆ ತ್ವರಿತಗತಿ ನ್ಯಾಯಾಲಯ

ಹುಬ್ಬಳ್ಳಿ ತಾಲ್ಲೂಕಿನ ಇನಾಂ ವೀರಾಪುರ ಗ್ರಾಮದ ಮಾನ್ಯಾಳ ಮರ್ಯಾದೆಗೇಡು ಹತ್ಯೆಗೆ ಸಂಬಂಧಿಸಿದಂತೆ ಪ್ರಕರಣದ ತ್ವರಿತ ವಿಚಾರಣೆ ನಡೆದು, ಸಂತ್ರಸ್ತರಿಗೆ ನ್ಯಾಯ ದೊರಕಿಸಿಕೊಡುವುದು ನಮ್ಮ ಪ್ರಮುಖ ಆದ್ಯತೆ. ಈ ಹಿನ್ನೆಲೆಯಲ್ಲಿ ತ್ವರಿತಗತಿ ನ್ಯಾಯಾಲಯ ರಚನೆಗೆ ಸರ್ಕಾರ ಕ್ರಮ ಕೈಗೊಳ್ಳಲಿದೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಹುಬ್ಬಳ್ಳಿ ಮರ್ಯಾದೆ ಹತ್ಯೆ: ಮೇಲ್ಜಾತಿ ಯುವತಿಯನ್ನ ಮದ್ವೆಯಾಗಿದ್ದಕ್ಕೆ ಲಿಂಗದೀಕ್ಷೆ ಪಡೆದಿದ್ದ ದಲಿತ ಕುಟುಂಬ

ಹುಬ್ಬಳ್ಳಿ ಘಟನೆಗೆ ಸಂಬಂಧಿಸಿದಂತೆ ದಲಿತರ ಮೇಲಿನ ದೌರ್ಜನ್ಯ ಹಾಗೂ ಕೊಲೆ ಪ್ರಕರಣ ದಾಖಲಾಗಿದೆ. ಇದು ಅಟ್ರಾಸಿಟಿ ಪ್ರಕರಣವಾಗಿರುವುದರಿಂದ 60 ದಿನಗಳ ಒಳಗಾಗಿ ದೋಷರೋಪ ಪಟ್ಟಿ ಸಲ್ಲಿಸಬೇಕಾಗಿದೆ. ಹೀಗಾಗಿ ಖಾಸಗಿ ಪ್ರಾಸಿಕ್ಯೂಟರ್‌ರನ್ನು ನೇಮಕ ಮಾಡಿಕೊಳ್ಳಲು ಕ್ರಮ ವಹಿಸಲಾಗಿದೆ ಎಂದಿದ್ದಾರೆ.

ಹೆಣ್ಣುಮಗಳೊಬ್ಬಳ ನಿಲುವಿಗೆ ವಿರುದ್ಧವಾಗಿ ಮದುವೆಗೆ ಬಲವಂತಪಡಿಸುವುದು ಅಥವಾ ಮದುವೆ ನಿರಾಕರಿಸುವುದು, ಜಾತಿಯಾಧಾರಿತ ಹಿಂಸೆ -ಹಲ್ಲೆ, ಮರ್ಯಾದೆಗೇಡು ಹತ್ಯೆಯಂತಹ ಘಟನೆಗಳ ತಡೆಗೆ ವಿಶೇಷ ಕಾನೂನು ರಚನೆ ಬಗ್ಗೆ ವಿಧಾನ ಮಂಡಲದ ಮುಂದಿನ ಅಧಿವೇಶನದಲ್ಲಿ ಚರ್ಚಿಸಿ, ಸೂಕ್ತ ನಿರ್ಣಯ ತೆಗೆದುಕೊಳ್ಳುತ್ತೇವೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ