Karnataka Rain: ಮುಂದುವರಿದ ಮಳೆ; ಕೊಡಗು, ಉತ್ತರ ಕನ್ನಡ ಸೇರಿದಂತೆ 9 ಜಿಲ್ಲೆಗಳಲ್ಲಿ ಇಂದು ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ

| Updated By: ರಮೇಶ್ ಬಿ. ಜವಳಗೇರಾ

Updated on: Jul 24, 2023 | 7:09 AM

ಕರಾವಳಿ ಸೇರಿದಂತೆ ಕರ್ನಾಟಕದ ವಿವಿಧ ಭಾಗಗಳಲ್ಲಿ ಮುಂದಿನ ನಾಲ್ಕು ದಿನಗಳ ಕಾಲ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈ ನಡುವೆ ಕೊಡಗು, ಉತ್ತರ ಕನ್ನಡ ಸೇರಿದಂತೆ ಒಂಬತ್ತು ಜಿಲ್ಲೆಗಳಲ್ಲಿ ಸೋಮವಾರವೂ (ಜುಲೈ 24) ಮಳೆ ಮುಂದುವರಿಯುವ ಮುನ್ಸೂಚನೆ ಹಿನ್ನೆಲೆ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ.

Karnataka Rain: ಮುಂದುವರಿದ ಮಳೆ; ಕೊಡಗು, ಉತ್ತರ ಕನ್ನಡ ಸೇರಿದಂತೆ 9 ಜಿಲ್ಲೆಗಳಲ್ಲಿ ಇಂದು ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ
ಕೊಡಗು, ಉತ್ತರ ಕನ್ನಡ ಸೇರಿದಂತೆ ಒಂಬತ್ತು ಜಿಲ್ಲೆಗಳ ಶಾಲಾ ಕಾಲೇಜುಗಳಿಗೆ ನಾಳೆ ರಜೆ ಘೋಷಣೆ (ಸಾಂದರ್ಭಿಕ ಚಿತ್ರ)
Follow us on

ಕೊಡಗು, ಜುಲೈ 23: ಕರ್ನಾಟಕದ (Karnataka) ಹಲವೆಡೆ ಸದ್ಯ ಭಾರೀ ಮಳೆಯಾಗುತ್ತಿದೆ (Rain). ಅಲ್ಲದೇ ಮುಂದಿನ ನಾಲ್ಕು ದಿನಗಳ ಕಾಲ ಮಳೆ (Karnataka Rain) ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆಯ ಮುನ್ಸೂಚನೆ ನೀಡಿದೆ.  ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಕೊಡಗು (Kodagu), ಉತ್ತರ ಕನ್ನಡ (Uttara Kannada) ಬೆಳಗಾವಿ, ಹಾವೇರಿ, ಹಾಸನ, ಧಾರವಾಡ, ದಾವಣಗೆರೆ ಸೇರಿದಂತೆ ಕರ್ನಾಟಕದ ಒಂಬತ್ತು ಜಿಲ್ಲೆಗಳಲ್ಲಿ   ಇಂದು ಸೋಮವಾರ (ಜುಲೈ 24) ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ.

ಕೊಡಗು ಜಿಲ್ಲೆಯಾದ್ಯಂತ ಭಾರೀ ಮಳೆ ಮುಂದುವರಿದ ಹಿನ್ನೆಲೆ ನಾಳೆ ಜಿಲ್ಲೆಯ ಶಾಲಾ‌, ಕಾಲೇಜುಗಳಿಗೆ ರಜೆ ಘೋಷಣೆ ಮಾಡಿ ಜಿಲ್ಲಾಧಿಕಾರಿ ವೆಂಕಟರಾಜಾ ಆದೇಶ ಹೊರಡಿಸಿದ್ದಾರೆ. ಅದೇ ರೀತಿ, ಉತ್ತರ ಕನ್ನಡ ಜಿಲ್ಲೆಯಲ್ಲೂ ಮಳೆ ಮುಂದುವರಿದ ಹಿನ್ನೆಲೆ ನಾಳೆ ಶಾಲಾ ಕಾಲೇಜಿಗೆ ರಜೆ ಘೋಷಣೆ ಮಾಡಿ ಜಿಲ್ಲಾಧಿಕಾರಿ ಪ್ರಭುಲಿಂಗ್ ಕವಲಿಕಟ್ಟಿ ಆದೇಶಿಸಿದ್ದಾರೆ. ಬೆಳಗಾವಿ ಜಿಲ್ಲೆಯಲ್ಲಿನ ಶಾಲಾ ಕಾಲೇಜುಗಳಿಗೆ ಈಗಾಗಲೇ ರಜೆ ಘೋಷಣೆ ಮಾಡಲಾಗಿದೆ.

ಇದನ್ನೂ ಓದಿ: ಮುಂದುವರೆದ ಭಾರೀ ಮಳೆ: ಬೆಳಗಾವಿ ತಾಲೂಕಿನ ಶಾಲೆಗಳಿಗೆ ನಾಳೆ ರಜೆ, ಡಿಸಿ ನಿತೇಶ್ ಪಾಟೀಲ್ ಆದೇಶ

ಶಿವಮೊಗ್ಗ ಜಿಲ್ಲೆಯಲ್ಲಿ ಶಾಲಾ ಕಾಲೇಜುಗಳಿಗೆ ನಾಳೆ ರಜೆ

ಶಿವಮೊಗ್ಗ ಜಿಲ್ಲೆಯಲ್ಲಿ ಮಳೆಯ ಆರ್ಭಟ ಮುಂದುವರಿದ ಹಿನ್ನೆಲೆ ಜಿಲ್ಲೆಯ ಸರ್ಕಾರಿ ಪ್ರಾಥಮಿಕ, ಪ್ರೌಢಶಾಲೆಗಳಿಗೆ ನಾಳೆ ರಜೆ ಘೋಷಣೆ ಮಾಡಿ ಶಿವಮೊಗ್ಗ ಡಿಡಿಪಿಐ ಪರಮೇಶ್ವರಪ್ಪ ಆದೇಶಿಸಿದ್ದಾರೆ. ಅನುದಾನಿತ, ಅನುದಾನ ರಹಿತ ಶಾಲೆಗಳಿಗೂ ನಾಳೆ ರಜೆ ಘೋಷಣೆ ಮಾಡಲಾಗಿದೆ.

ಹಾಸನ ಜಿಲ್ಲಾದ್ಯಂತ ಶಾಲೆಗಳಿಗೆ ರಜೆ ಘೋಷಣೆ

ಹಾಸನ ಜಿಲ್ಲೆಯಾದ್ಯಂತ ಭಾರೀ ಮಳೆ ಮುಂದುವರಿದ ಹಿನ್ನೆಲೆ ಜಿಲ್ಲೆಯ ಐದು ತಾಲೂಕುಗಳ ಶಾಲೆಗಳಿಗೆ ನಾಳೆ ರಜೆ ಘೋಷಣೆ ಮಾಡಲಾಗಿದೆ. ಸಕಲೇಶಪುರ, ಆಲೂರು, ಬೇಲೂರು, ಅರಕಲಗೂಡು ಮತ್ತು ಹಾಸನ ತಾಲೂಕಿನಾದ್ಯಂತ ಅಂಗನವಾಡಿ, ಶಾಲೆಗಳಿಗೆ ನಾಳೆ ರಜೆ ಘೋಷಣೆ ಮಾಡಿ ಜಿಲ್ಲಾಧಿಕಾರಿ ಸಿ.ಸತ್ಯಭಾಮಾ ಆದೇಶ ಹೊರಡಿಸಿದ್ದಾರೆ.

ಬೈಂದೂರು ತಾಲೂಕಿನಲ್ಲಿ ಶಾಲಾ ಕಾಲೇಜುಗಳಿಗೆ ರಜೆ

ಉಡುಪಿ ಜಿಲ್ಲೆಯಲ್ಲೂ ಮಳೆಯಾಗುತ್ತಿದ್ದು, ಬೈಂದೂರು ತಾಲೂಕಿನಲ್ಲಿ ಧಾರಾಕಾರ ಮಳೆಯಾಗುತ್ತಿದೆ. ನಾಳೆಯೂ ಮುಂದುವರಿಯುವ ಮುನ್ಸೂಚನೆ ಹಿನ್ನೆಲೆ ತಾಲೂಕಿನ ಶಾಲೆ ಮತ್ತು ಪಿಯುಸಿ ಕಾಲೇಜಿಗೆ ರಜೆ ಘೋಷಿಸಲಾಗಿದೆ.

ಧಾರವಾಡ ಜಿಲ್ಲೆಯಲ್ಲಿ ಮಳೆಯಬ್ಬರ, ಶಾಲೆಗಳಿಗೆ ರಜೆ

ಧಾರವಾಡ ಜಿಲ್ಲೆಯಲ್ಲಿ ಮಳೆ ಅಬ್ಬರ ಕಡಿಮೆಯಾಗದ ಹಿನ್ನೆಲೆ ಜಿಲ್ಲೆಯ ಎಲ್ಲಾ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಆದೇಶ ಹೊರಡಿಸಿದ್ದಾರೆ. ಆಗಸ್ಟ್ 5 ರ ಶನಿವಾರದಂದು ಸಂಜೆವರೆಗೆ ಶಾಲೆ ನಡೆಸುವಂತೆ ಸೂಚನೆ ನೀಡಿದ್ದಾರೆ.

ಹಾವೇರಿ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ರಜೆ

ಹಾವೇರಿ ಜಿಲ್ಲೆಯಾದ್ಯಂತ ಭಾರಿ ಮಳೆ ಮುಂದುವರಿದ ಹಿನ್ನೆಲೆ ನಾಳೆ ಜಿಲ್ಲೆಯ ಎಲ್ಲಾ ಅಂಗನವಾಡಿ, ಪ್ರಾಥಮಿಕ, ಹೈಸ್ಕೂಲ್, ಪಿಯುಸಿ ಕಾಲೇಜಿಗೆ ರಜೆ ಘೋಷಣೆ ಮಾಡಲಾಗಿದೆ. ಈ ಬಗ್ಗೆ ಆದೇಶ ಹೊರಡಿಸಿದ ಜಿಲ್ಲಾಧಿಕಾರಿ ರಘುನಂದನ ಮೂರ್ತಿ, ಪದವಿ ಮತ್ತು ಐಟಿಐ ಕಾಲೇಜುಗಳು ಎಂದಿನಂತೆ ನಡೆಯಲಿವೆ ಎಂದು ಸೂಚಿಸಿದ್ದಾರೆ.

ದಾವಣಗೆರೆ ಜಿಲ್ಲೆಯ ಮೂರು ತಾಲೂಕಿನ ಶಾಲೆಗಳಿಗೆ ರಜೆ ಘೋಷಣೆ

ದಾವಣಗೆರೆ ಜಿಲ್ಲೆಯಲ್ಲಿ ಮಳೆ ಪ್ರಾರಂಭ ಹಿನ್ನಲೆ ಜಿಲ್ಲೆಯ ಮೂರು ತಾಲ್ಲೂಕಿನ ಶಾಲೆಗಳಿಗೆ ರಜೆ ಘೋಷಣೆ‌ ಮಾಡಲಾಗಿದೆ. ಚನ್ನಗಿರಿ, ಹೊನ್ನಾಳಿ ಹಾಗೂ ನ್ಯಾಮತಿ ತಾಲ್ಲೂಕಿನಾದ್ಯಂತ ಶಾಲೆಗಳಿಗೆ ರಜೆ ಘೋಷಿಸಿ ಅಯಾ ತಾಲ್ಲೂಕು ಅಡಳಿತ ಹಾಗೂ ಶಿಕ್ಷಣ ಇಲಾಖೆ ಆದೇಶಿಸಿದೆ. ಸರ್ಕಾರಿ, ಅನುದಾನಿತ ಅನುದಾನ ರಹಿತ ಪ್ರಾಥಮಿಕ, ಪ್ರೌಢಶಾಲಾಗಳಿಗೂ ರಜೆ ಘೋಷಿಸಲಾಗಿದೆ. ಉಳಿದ ತಾಲೂಕುಗಳಲ್ಲಿ ಪರಿಸ್ಥಿತಿ ನೋಡಿಕೊಂಡು ರಜೆ ಘೋಷಣೆ ಮಾಡುವಂತೆ ಮುಖ್ಯ ಶಿಕ್ಷಕರಿಗೆ ಸೂಚನೆ ನೀಡಲಾಗಿದೆ ಎಂದು ಟಿವಿ9ಗೆ ದಾವಣಗೆರೆ ಜಿಲ್ಲಾಧಿಕಾರಿ ಶಿವಾನಂದ ಕಾಪಾಶಿ ಮಾಹಿತಿ ನೀಡಿದ್ದಾರೆ.

ಕರ್ನಾಟಕದ ಕರಾವಳಿ, ದಕ್ಷಿಣ ಒಳನಾಡು ಹಾಗೂ ಉತ್ತರ ಒಳನಾಡಿನ ಹಲವು ಕಡೆಗಳಲ್ಲಿ ಜುಲೈ 27ರ ವರೆಗೂ ಮಳೆಯಾಗಲಿದೆ. ಈ ಬಗ್ಗೆ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ದಕ್ಷಿಣ ಕನ್ನಡ, ಉಡುಪಿ, ಕೊಡಗು, ಉತ್ತರ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್​ ಘೊಷಿಸಿದೆ. ಅದೇ ರೀತಿ ಯಾದಗಿರಿ, ಹಾಸನ, ಕಲಬರಗಿ, ಬೆಳಗಾವಿ, ಬೀದರ್, ಧಾರವಾಡ​ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಿಸಿದೆ.

ಇನ್ನುಳಿದಂತೆ ಬಾಗಲಕೋಟೆ, ಗದಗ, ಹಾವೇರಿ, ಕೊಪ್ಪಳ, ಚಾಮರಾಜನಗರ, ಚಿತ್ರದುರ್ಗ, ರಾಯಚೂರು, ವಿಜಯಪುರ, ಬಳ್ಳಾರಿ, ತುಮಕೂರು, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ರಾಮನಗರ, ಚಿಕ್ಕಬಳ್ಳಾಪುರ, ದಾವಣಗೆರೆ, ಕೋಲಾರ, ಮಂಡ್ಯ, ಮೈಸೂರು, ವಿಜಯನಗರ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 7:51 pm, Sun, 23 July 23