ಬೆಂಗಳೂರು/ಹುಬ್ಬಳ್ಳಿ, ಏಪ್ರಿಲ್ 19: ಹುಬ್ಬಳ್ಳಿಯ (Hubballi) ಎಂಸಿಎ ವಿದ್ಯಾರ್ಥಿನಿ ನೇಹಾ ಹತ್ಯೆ (Student Neha) ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸ್ ಮಹಾನಿರ್ದೇಶಕ ಅಲೋಕ್ ಮೋಹನ್ ಮತ್ತು ಬೆಂಗಳೂರು ಪೊಲೀಸ್ ಆಯುಕ್ತ ಬಿ ದಯಾನಂದ್ ಜೊತೆ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಒಂದು ಗಂಟೆಗೂ ಹೆಚ್ಚು ಕಾಲ ಸುದೀರ್ಘ ಸಭೆ ನಡೆಸಿದರು. ಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಆರೋಪಿ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದರು. ಇಂತಹ ಘಟನೆಗಳು ನಡೆಯದಂತೆ ಎಚ್ಚರ ವಹಿಸಬೇಕು. ಆರೋಪಿ ವಿರುದ್ಧ ನಿರ್ದಾಕ್ಷಿಣ್ಯವಾಗಿ ಕ್ರಮಕೈಗೊಳ್ಳಿ. ಚುನಾವಣಾ ಸಮಯದಲ್ಲಿ ಇಂತಹ ಅಹಿತಕರ ಘಟನೆ ಆಗದಂತೆ ನೋಡಿಕೊಳ್ಳಿ ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಸಭೆ ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಸಿಎಂ ಸಿದ್ದಾರಾಮಯ್ಯ, ಕರ್ನಾಟಕದಲ್ಲಿ ಕಾನೂನು ಸುವ್ಯವಸ್ಥೆ ಬಹಳ ಚೆನ್ನಾಗಿದೆ. ಯಾವುದೇ ಕೊಲೆ ವೈಯಕ್ತಿಕ ಕಾರಣಕ್ಕೆ ಆಗಿರುತ್ತದೆ. ಕಾನೂನು ಸುವ್ಯವಸ್ಥೆ ಕಾಪಾಡುವುದು ಸರ್ಕಾರ ಕೆಲಸ. ಸರ್ಕಾರ ಕಾನೂನು ಸುವ್ಯವಸ್ಥೆ ಕಾಪಾಡುತ್ತೆ ಎಂದರು.
ಗುರುವಾರ ನಡೆದ ಘಟನೆ ಸಂಬಂಧ ವಿದ್ಯಾನಗರ ಪೊಲೀಸ್ ಠಾಣೆಯಲ್ಲಿ ಈಗಾಗಲೇ ಪ್ರಕರಣ ದಾಖಲಾಗಿದೆ. ನೇಹಾ ಕೊಲೆ ಪ್ರಕರಣದ ತನಿಖೆ ನಡೆಸುತ್ತಿದ್ದೇವೆ. ಕಾನೂನು ಪ್ರಕಾರವೇ ಏನು ಶಿಕ್ಷೆಯಾಗಬೇಕು ಅದು ಆಗುತ್ತದೆ. ಫಯಾಜ್ಗೆ ಕೋರ್ಟ್ 14 ದಿನ ನ್ಯಾಯಾಂಗ ಬಂಧನ ವಿಧಿಸಿದೆ ಎಂದು ಹುಬ್ಬಳ್ಳಿ-ಧಾರವಾಡ ನಗರ ಪೊಲೀಸ್ ಆಯುಕ್ತೆ ರೇಣುಕಾ ಸುಕುಮಾರ್ ಹೇಳಿದರು.
ಇದನ್ನೂ ಓದಿ: ಚುನಾವಣೆ ಹೊಸ್ತಿಲಲ್ಲೇ ಸರಣಿ ಕೊಲೆ, ರಾಜ್ಯದಾದ್ಯಂತ ಒಂದೇ ದಿನ 12 ಮಂದಿಯ ಹತ್ಯೆ
ಕೊಲೆಯಾದ ನೇಹಾ ಮತ್ತು ಆರೋಪಿ ಫಯಾಜ್ ಪರಸ್ಪರ ಪ್ರೀತಿಸುತ್ತಿದ್ದರು. ನಂತರ ನೇಹಾ ಫಯಾಜ್ನಿಂದ ದೂರವಾಗಲು ಯತ್ನಿಸಿದ್ದಾಳೆ. ಇದರಿಂದ ಕೋಪಗೊಂಡ ಫಯಾಜ್ ಕೊಲೆ ಮಾಡಿದ್ದಾನೆ. ಘಟನೆ ನಡೆದ ವೇಳೆ ಮಗಳ ಜೊತೆ ಇದ್ದ, ತಾಯಿ ಮೇಲೂ ಹಲ್ಲೆ ಮಾಡಲಾಗಿದೆ, ಆದರೆ ನೇಹಾ ತಾಯಿಯನ್ನು ರಕ್ಷಣೆ ಮಾಡಲಾಗಿದೆ ಎಂದು ಎಂದು ಗೃಹ ಸಚಿವ ಜಿ ಪರಮೇಶ್ವರ ಹೇಳಿದರು.
ಇದರಲ್ಲಿ ಲವ್ ಜಿಹಾದ್ ಕಂಡು ಬಂದಿಲ್ಲ. ನನ್ನನ್ನು ಬಿಟ್ಟು ಬೇರೆಯವನ್ನು ಮದುವೆ ಮಾಡಿಕೊಳ್ಳುತ್ತೀಯಾ ಅಂತ ಕೂಪದಲ್ಲಿ ಕೊಲೆ ಮಾಡಿದ್ದಾನೆ. ಇಂಥಹ ಘಟನೆಗಳು ಆಕಸ್ಮಿಕವಾಗಿ ನಡೆಯುತ್ತವೆ. ಆರೋಪಿ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತೆ ಎಂದರು.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 1:13 pm, Fri, 19 April 24