ಹುಬ್ಬಳ್ಳಿ, ಜೂನ್ 03: ವಿಧಾನ ಪರಿಷತ್ ಟಿಕೆಟ್ ವಿಚಾರವಾಗಿ ಧಾರವಾಡ ಜಿಲ್ಲಾ ಕಾಂಗ್ರೆಸ್ನಲ್ಲಿ (Congress) ಭಿನ್ನಮತ ಉಂಟಾಗಿದೆ. ಕೆಪಿಸಿಸಿ ಪ್ರಧಾನ ಕಾರ್ಯದರ್ಶಿಯಾಗಿರುವ ಇಸ್ಮಾಯಿಲ್ ತಮಟಗಾರ (Ismail Tamatgar) ವಿಧಾನ ಪರಿಷತ್ ಟಿಕೆಟ್ ನೀಡದ ಹಿನ್ನಲೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಇದೀಗ ಇಸ್ಮಾಯಿಲ್ ತಮಟಗಾರಗೆ ಪರಿಷತ್ ಟಿಕೆಟ್ ನೀಡದ್ದಕ್ಕೆ ಹುಬ್ಬಳ್ಳಿ-ಧಾರವಾಡ ಪಾಲಿಕೆ ವಾರ್ಡ್ ನಂ.6ರ ಸದಸ್ಯೆ ದಿಲ್ ಶಾದ ಬೇಗಂ ನಧಾಪ ರಾಜೀನಾಮೆ ನೀಡಿದ್ದಾರೆ. ಜಿಲ್ಲಾಧ್ಯಕ್ಷ ಅಲ್ತಾಫ್ ಹಳ್ಳೂರ್ಗೆ ರಾಜೀನಾಮೆ ಪತ್ರ ರವಾನಿಸಿದ್ದಾರೆ.
ವಿಧಾನ ಪರಿಷತ್ ಟಿಕೆಟ್ ನೀಡುವ ವಿಚಾರದಲ್ಲಿ ಕಾಂಗ್ರೆಸ್ ಹೈಕಮಾಂಡ್ ಅನ್ಯಾಯ ಮಾಡಿದೆ. ಧಾರವಾಡ ಜಿಲ್ಲೆಯ ವಿಚಾರವಾಗಿ ಕಾಂಗ್ರೆಸ್ ತಗೆದುಕೊಂಡಿರುವ ತೀರ್ಮಾನಕ್ಕೆ ಮನನೊಂದು ರಾಜೀನಾಮೆ ನೀಡಿರುವುದಾಗಿ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.
ಕಾಂಗ್ರೆಸ್ ಪಕ್ಷದ ಯುವ ಉತ್ಸಾಹಿ ಮುಖಂಡರು, ಸಂಘಟನಾ ಚತುರ, ಧಾರವಾಡ ಅಂಜುಮನ್ ಇಸ್ಲಾಂ ಸಂಸ್ಥೆಯ ಅಧ್ಯಕ್ಷ ಹಾಗೂ ಕೆಸಿಸಿ ಪ್ರಧಾನ ಕಾರ್ಯದರ್ಶಿ ಇಸ್ಮಾಯಿಲ್ ತಮಟಗಾರ ಅವರಿಗೆ ಈ ಬಾರಿ ವಿಧಾನ ಪರಿಷತ್ ಟಿಕೆಟ್ ನೀಡುವ ನಿಟ್ಟಿನಲ್ಲಿ ಕಾಂಗ್ರೆಸ್ ಪಕ್ಷದ ವರಿಷ್ಠ ನಾಯಕರು ಮಾಡಿರುವ ಅನ್ಯಾಯವನ್ನು ಖಂಡಿಸಿ, ಧಾರವಾಡ ಜಿಲ್ಲೆಯ ಬಗ್ಗೆ ಕಾಂಗ್ರೆಸ್ ಹೈಕಮಾಂಡ ತೆಗೆದುಕೊಂಡಿರುವ ತೀರ್ಮಾನಕ್ಕೆ ಮನನೊಂದು ಧಾರವಾಡ ಗ್ರಾಮೀಣ ವಿಧಾನಸಭಾ ಕ್ಷೇತ್ರದ 71 ರಲ್ಲಿ ಬರುವ ಹುಬ್ಬಳ್ಳಿ ಧಾರವಾಡ ಮಹಾನಗರ ಕಾಂಗ್ರೆಸ್ ಅಧ್ಯಕ್ಷರು ಈ ಪತ್ರವನ್ನು ಪರಿಗಣಿಸಿ ನನ್ನ ರಾಜೀನಾಮೆಯನ್ನು ಅಂಗೀಕರಿಸಬೇಕೆಂದು ವಿನಂತಿಸಿಕೊಂಡಿದ್ದಾರೆ.
ಇದನ್ನೂ ಓದಿ: ಲೋಕಸಭಾ ಚುನಾವಣೆ ರಿಸಲ್ಟ್ಗೆ ಒಂದು ದಿನ ಇರುವಾಗಲೇ ಡಾ.ಸುಧಾಕರ್ ವಿರುದ್ಧ ಕೇಸ್ ಬುಕ್
ಕೆಪಿಸಿಸಿ ಪ್ರಧಾನ ಕಾರ್ಯದರ್ಶಿಯಾಗಿರುವ ಇಸ್ಮಾಯಿಲ್ ತಮಟಗಾರಗೆ ಟಿಕೆಟ್ ಕೈತಪ್ಪಿದ್ದಕ್ಕೆ ಬೆಂಬಲಿಗರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಧಾರವಾಡ ಅಂಜುಮನ್ ಇಸ್ಲಾಂ ಸಂಸ್ಥೆಯ ಆವರಣದಲ್ಲಿ ಬೆಂಬಲಿಗರಿಂದ ಪ್ರತಿಭಟನೆ ಮಾಡಲಾಗಿದೆ. ಉತ್ತರ ಕರ್ನಾಟಕ ಭಾಗದ ಮುಸ್ಲಿಂ ನಾಯಕನನ್ನು ಕಾಂಗ್ರೆಸ್ ಸರ್ಕಾರ ಕಟಡೆಗಣಿಸುತ್ತಿರುವುದು ಸರಿಯಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಇದನ್ನೂ ಓದಿ: ಎಕ್ಸಿಟ್ ಪೋಲ್ ಗಳು ಗೊಂದಲ ಸೃಷ್ಟಿಸಿವೆ, ಅವಸರ ಯಾಕೆ? ನಾಳೆ ಮಧ್ಯಾಹ್ನ ಎಲ್ಲ ಗೊತ್ತಾಗಲಿದೆ: ಸತೀಶ್ ಜಾರಕಿಗೊಳಿ
ಮುಸ್ಲಿಂ ಸಮುದಾಯದಲ್ಲಿ ಮುಂಚೂಣಿಯಲ್ಲಿರುವ ನಾಯಕ ಇಸ್ಮಾಯಿಲ್ ತಮಟಗಾರಗೆ ವಿಧಾನ ಪರಿಷತ್ ಟಿಕೆಟ್ ನೀಡಬೇಕು. ಇಲ್ಲದಿದ್ದರೆ ಮುಂದಿನ ದಿನಗಳಲ್ಲಿ ಉಗ್ರ ಪ್ರತಿಭಟನೆ ಮಾಡುವುದಾಗಿ ಎಚ್ಚರಿಕೆ ನೀಡಿದ್ದಾರೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.