ಮೈಸೂರು, ಫೆ.10: ಕೃಷಿ ಉತ್ಪನ್ನಗಳಿಗೆ ಕನಿಷ್ಠ ಬೆಂಬಲ ಬೆಲೆ ಖಾತ್ರಿ ಕಾನೂನು ಜಾರಿ, ಸಂಪೂರ್ಣ ಸಾಲ ಮನ್ನಾ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಫೆಬ್ರವರಿ 13 ರಂದು ಸಂಯುಕ್ತ ಕಿಸಾನ್ ಮೋರ್ಚಾ (ರಾಜಕೀಯೆತರ) ಆಯೋಜಿಸಿರುವ ದೆಹಲಿ ಚಲೋ (Delhi Chalo) ಪ್ರತಿಭಟನೆಯಲ್ಲಿ ಕರ್ನಾಟಕದ ರೈತರೂ ಭಾಗಿಯಾಗಲಿದ್ದಾರೆ. ಅದರಂತೆ, ಮೈಸೂರು (Mysuru) ಜಿಲ್ಲೆಯಿಂದ ರೈತ ಮುಖಂಡ ಕುರುಬೂರು ಶಾಂತಕುಮಾರ್ ನೇತೃತ್ವದಲ್ಲಿ ನೂರಾರು ರೈತರು ರಾಷ್ಟ್ರ ರಾಜಧಾನಿ ದೆಹಲಿಗೆ ಪ್ರಯಾಣ ಕೈಗೊಂಡಿದ್ದಾರೆ.
ಪ್ರತಿಭಟನೆಯಲ್ಲಿ ಭಾಗಿಯಾಗಲು ರೈಲ್ವೇ ನಿಲ್ದಾಣಕ್ಕೆ ಆಗಮಿಸಿದ ರೈತರನ್ನು ರಾಜ್ಯ ಕಬ್ಬು ಬೆಳೆಗಾರ ಸಂಘದ ಅಧ್ಯಕ್ಷ ಕುರುಬೂರು ಶಾಂತಕುಮಾರ್ ಅವರು ಸ್ವಾಗತಿಸಿದರು. ಈ ವೇಳೆ ಮಾತನಾಡಿದ ಶಾಂತಕುಮಾರ್, ಎಂಎಸ್ ಸ್ವಾಮಿನಾಥನ್ ಅವರಿಗೆ ಭಾರತ ರತ್ನ ಪ್ರಶಸ್ತಿ ನೀಡುವ ಕೇಂದ್ರ ಸರ್ಕಾರ, ಅವರು ನೀಡಿದ ವರದಿಯನ್ನು ಯಾಕೆ ಜಾರಿ ಮಾಡುತ್ತಿಲ್ಲ ಎಂದು ಪ್ರಶ್ನಿಸಿದರು.
ಇದನ್ನೂ ಓದಿ: ಸಿದ್ದರಾಮಯ್ಯ ಅತ್ಯಾಪ್ತ ಸಚಿವ ಕೆ ವೆಂಕಟೇಶ್ ಕ್ಷೇತ್ರದಲ್ಲಿ ತಾಂಡವವಾಡುತ್ತಿದೆ ದ್ವೇಷದ ರಾಜಕಾರಣ! ರೈತರು ಹೈರಾಣ
ರೈತರ ಬೇಡಿಕೆಗಳನ್ನು ಈಡೇರಿಸುವ ಮೂಲಕ ಕೇಂದ್ರ ಸರ್ಕಾರ ರೈತರ ಹಿತ ಕಾಪಾಡಬೇಕು ಎಂದು ಒತ್ತಾಯಿಸಿದ ಶಾಂತಕುಮಾರ್, ದೆಹಲಿ ಚಲೋ ಪ್ರತಿಭಟನೆಯಲ್ಲಿ ರಾಜ್ಯದ ವಿವಿಧ ಜಿಲ್ಲೆಗಳ ರೈತರು ಸಾವಿರಾರು ಸಂಖ್ಯೆಯಲ್ಲಿ ಭಾಗಿಯಾಗಲಿದ್ದಾರೆ ಎಂದರು.
ಕೇಂದ್ರ ಸರ್ಕಾರವು ರೈತರ ಬೇಡಿಕೆಗಳನ್ನು ಈಡೇರಿಸಬೇಕು. ಇಲ್ಲವಾದರೆ ಈ ಬಾರಿಯ ಲೋಕಸಭಾ ಚುನಾವಣೆ ರೈತರ ಪಾಲಿನ ಕರಾಳ ಚುನಾವಣೆಯಾಗಲಿದೆ ಎಂದು ಕುರುಬುರು ಶಾಂತಕುಮಾರ್ ಎಚ್ಚರಿಕೆ ನೀಡಿದರು.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ