ಬೆಂಗಳೂರು: ಭಾರತೀಯ ಆಡಳಿತ ಸೇವೆಯ ಹಿರಿಯ ಅಧಿಕಾರಿ ವಂದಿತಾ ಶರ್ಮಾ ಅವರು ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಯಾಗಿ ಇಲ್ಲಿ ಇಂದು ಸಂಜೆ ಅಧಿಕಾರ ಸ್ವೀಕರಿಸಿದರು. ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸುತ್ತಿರುವ ಪಿ ರವಿಕುಮಾರ್ ಅವರ ವಯೋ ನಿವೃತ್ತಿಯಿಂದ ತೆರವಾದ ಹುದ್ದೆಗೆ ಕರ್ನಾಟಕ ವೃಂದದ ಭಾರತೀಯ ಆಡಳಿತ ಸೇವೆಯ 1986 ನೇ ಸಾಲಿನ ತಂಡದ ವಂದಿತಾ ಶರ್ಮಾ ಉತ್ತರಾಧಿಕಾರಿಯಾಗಿದ್ದಾರೆ (Karnataka Chief Secretary IAS Vandita Sharma).
ಸರ್ಕಾರದ 39 ನೇ ಮುಖ್ಯ ಕಾರ್ಯದರ್ಶಿ ವಂದಿತಾ:
ವಂದಿತಾ ಶರ್ಮಾ ಅವರು ರಾಜ್ಯದಲ್ಲಿ ಮುಖ್ಯ ಕಾರ್ಯದರ್ಶಿ ಹುದ್ದೆಯನ್ನು ಅಲಂಕರಿಸುತ್ತಿರುವ ನಾಲ್ಕನೇ ಮಹಿಳೆಯಾಗಿದ್ದಾರೆ. ಅಂತೆಯೇ, ರಾಜ್ಯ ಸರ್ಕಾರದ 39 ನೇ ಮುಖ್ಯ ಕಾರ್ಯದರ್ಶಿಯಾಗಿದ್ದಾರೆ. ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಹುದ್ದೆಯನ್ನು ಈ ಹಿಂದೆ 2000 ನೇ ಇಸವಿಯಲ್ಲಿ ಥೆರೇಸಾ ಭಟ್ಟಾಚಾರ್ಯ, 2006 ನೇ ಇಸವಿಯಲ್ಲಿ ಮಾಲತಿ ದಾಸ್ ಹಾಗೂ 2017 ನೇ ಇಸವಿಯಲ್ಲಿ ಕೆ. ರತ್ನ ಪ್ರಭ ಅವರೂ ಅಲಂಕರಿಸಿದ್ದರು.
ಕೆ ರತ್ನ ಪ್ರಭ ಅವರ ಅಧಿಕಾರಾವಧಿಯಲ್ಲಿ ರಾಜ್ಯ ಪೋಲಿಸ್ ಮಹಾನಿರ್ದೇಶಕ ಹಾಗೂ ಮಹಾ ನಿರೀಕ್ಷಕ ಹುದ್ದೆಯನ್ನು ನೀಲಮಣಿ ಎನ್ ರಾಜು ಅಲಂಕರಿಸಿದಾಗ ಎರಡು ಪ್ರಮುಖ ಹುದ್ದೆಗಳಲ್ಲಿ ಮಹಿಳೆಯರೇ ಇದ್ದಾರೆ ಎಂಬುದು ಗಮನಾರ್ಹ ಅಂಶವಾಗಿತ್ತು.
ಇದೀಗ ವಂದಿತಾ ಶರ್ಮಾ ಅವರು ರಾಜ್ಯದ ಮುಖ್ಯ ಕಾರ್ಯದರ್ಶಿಯಾಗಿ ಅಧಿಕಾರ ಸ್ವೀಕರಿಸುವುದರೊಂದಿಗೆ ರಾಜ್ಯದ ಶಕ್ತಿ ಕೇಂದ್ರ ವಿಧಾನಸೌಧದಲ್ಲಿ ಇರುವ ಮೂರೂ ಪ್ರಮುಖ ಹುದ್ದೆಗಳನ್ನು ಮಹಿಳೆಯರೇ ಅಲಂಕರಿಸಿದಂತಾಗುತ್ತದೆ. ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ, ರಾಜ್ಯ ವಿಧಾನಸಭೆಯ ಕಾರ್ಯದರ್ಶಿ ಎಂ ಕೆ ವಿಶಾಲಾಕ್ಷಿ ಹಾಗೂ ರಾಜ್ಯ ವಿಧಾನ ಪರಿಷತ್ ಕಾರ್ಯದರ್ಶಿ ಕೆ ಆರ್ ಮಹಾಲಕ್ಷ್ಮಿ ಶಕ್ತಿ ಕೇಂದ್ರದ ಶಕ್ತಿಯಾಗಿ ಹೊಸ ದಾಖಲೆ ಸ್ಥಾಪಿಸಲಿದ್ದಾರೆ.
ವಂದಿತಾ ಶರ್ಮಾ ಅವರ ನೇಮಕಾತಿಯಲ್ಲಿ ರಾಜ್ಯ ಸರ್ಕಾರವು ಎಂದಿನಂತೆ ಸೇವಾ ಹಿರಿತನವನ್ನು ಪುರಸ್ಕರಿಸಿದೆ. ವಂದಿತಾ ಶರ್ಮಾ ಅವರ ಅಧಿಕಾರಾವಧಿ ನವೆಂಬರ್ 30, 2022 ರವರೆಗೆ ಇದೆ.
ವಂದಿತಾ ಶರ್ಮಾ ಅವರ ಪತಿಯೂ ಕೂಡಾ ಭಾರತೀಯ ಆಡಳಿತ ಸೇವೆಯ ಅಧಿಕಾರಿಯಾಗಿ, ಪ್ರಸ್ತುತ ಹಣಕಾಸು ಇಲಾಖೆಯ ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿಯಾಗಿದ್ದಾರೆ. ಅಲ್ಲದೆ, ಇದೇ ದಿನದಿಂದು ಅಪರ ಮುಖ್ಯ ಕಾರ್ಯದರ್ಶಿ ಹಾಗೂ ಅಭಿವೃದ್ಧಿ ಆಯುಕ್ತರ ಹುದ್ದೆಯ ಅಧಿಕ ಪ್ರಭಾರವನ್ನೂ ವಹಿಸಿಕೊಂಡಿದ್ದಾರೆ.
ಇದನ್ನೂ ಓದಿ: ಇಂಡಿಯಾ ಬುಕ್ ಆಫ್ ರೆಕಾರ್ಡ್ಗೆ ಸೇರಿದ ಶಾಲೆಯ ಮೆಟ್ಟಿಲನ್ನು ಹತ್ತದ ಬೆಂಗಳೂರಿನ ಬಾಲಕ
ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ