ತಂದೆ-ತಾಯಿ ಹಾಗೂ ಹಿರಿಯರ ಆರೈಕೆ ಮಾಡದಿದ್ರೆ ಆಸ್ತಿಯಲ್ಲಿ ಪಾಲಿಲ್ಲ: ಕೃಷ್ಣ ಬೈರೇಗೌಡ
ಇತ್ತೀಚೆಗೆ ಕೆಲ ಮಕ್ಕಳ ತಮ್ಮ ವಯಸ್ಸಾದ ತಂದೆ ತಾಯಿಯನ್ನು ಸರಿಯಾಗಿ ನೋಡಿಕೊಳ್ಳುತ್ತಿಲ್ಲ. ಬದಲಾಗಿ ಅವರನ್ನು ಅನಾಥ ಆಶ್ರಮಗಳಿಗೆ ಕಳುಸಿದ ಪ್ರಕರಣಗಳು ಬೆಳಕಿಗೆ ಬಂದಿದೆ. ಈ ಸಂಬಂಧ ಕುಟುಂಬದಲ್ಲಿನ ಹಿರಿಯ ರಕ್ಷಣೆಗೆ ಸಂಬಂಧ ಇಂದು ಕರ್ನಾಟಕ ವಿಧಾನಪರಿಷತ್ನಲ್ಲಿ ಪ್ರಸ್ತಾಪವಾಗಿದ್ದು, ಇದಕ್ಕೆ ಕಂದಾಯ ಸಚಿವ ಕೃಷ್ಣ ಬೈರೇಗೌಡ ಪ್ರತಿಕ್ರಿಯಿಸಿ ತಂದೆ-ತಾಯಿ, ಹಿರಿಯರನ್ನ ಆರೈಕೆ ಮಾಡದಿದ್ರೆ ಅವರ ಆಸ್ತಿಯಲ್ಲಿ ಪಾಲಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ಬೆಂಗಳೂರು, (ಮಾರ್ಚ್ 12): ‘ತಂದೆ-ತಾಯಿ ಹಾಗೂ ಹಿರಿಯ ನಾಗರೀಕರನ್ನು ಆರೈಕೆ ಮಾಡದಿದ್ದರೆ ಅವರ ಆಸ್ತಿಯಲ್ಲಿ ಪಾಲಿಲ್ಲ’ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಮಾಹಿತಿ ನೀಡಿದ್ದಾರೆ. ಹಿರಿಯ ನಾಗರಿಕರ ಮೇಲೆ ಆಗುತ್ತಿರುವ ದೌರ್ಜನ್ಯ, ಕಿರುಕುಳ ತಡೆಯಲು ಅವರ ಸುರಕ್ಷತೆಗೆ ಒಂದು ಕಾನೂನು ತರಬೇಕೆಂದು ಇಂದು (ಮಾರ್ಚ್ 12) ವಿಧಾನ ಪರಿಷತ್‌ನಲ್ಲಿ ಸದಸ್ಯೆ ಬಲ್ಕೀಸ್ ಬಾನು ಪ್ರಶ್ನಿಸಿದರು. ಇದಕ್ಕೆ ಉತ್ತರಿಸಿದ ಕೃಷ್ಣ ಬೈರೇಗೌಡ (Krishna Byre Gowda), ತಂದೆ-ತಾಯಿ ಹಾಗೂ ಹಿರಿಯರನ್ನು ಆರೈಕೆ ಮಾಡದಿದ್ದರೆ, ತನ್ನ ಮಕ್ಕಳಿಗೆ ಅಥವಾ ಸಂಬಂಧಿಕರಿಗೆ ಅವರು ನೀಡಿದ ವಿಲ್ ಅಥವಾ ದಾನಪತ್ರವನ್ನು ರದ್ದು ಮಾಡುವ ಅವಕಾಶವನ್ನು ಕೇಂದ್ರ ಸರ್ಕಾರದ ಪೋಷಕ ಮತ್ತು ಹಿರಿಯ ನಾಗರಿಕರ ನಿರ್ವಹಣೆ ಹಾಗೂ ಕಲ್ಯಾಣ ಕಾಯ್ದೆ 2007ರಲ್ಲಿ ನೀಡಿದೆ ಎಂದು ಮಾಹಿತಿ ನೀಡಿದರು.
ಇತ್ತೀಚಿನ ದಿನಗಳಲ್ಲಿ ಮಕ್ಕಳು ತಮ್ಮ ತಂದೆ-ತಾಯಿಯನ್ನೇ ಆರೈಕೆ ಮಾಡದಂತಹ ಹಲವಾರು ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಒಂದು ವೇಳೆ ಮಕ್ಕಳು ಅಥವಾ ಸಂಬಂಧಿಕರು ತಮ್ಮನ್ನು ಆರೈಕೆ ಮಾಡದಿದ್ದರೆ ಅವರ ಹೆಸರಿಗೆ ಮಾಡಿರುವ ವಿಲ್ ಅಥವಾ ದಾನಪತ್ರವನ್ನು ರದ್ದು ಮಾಡುವ ಅಧಿಕಾರ ಹಿರಿಯ ನಾಗರಿಕರಿಗೆ ಇದೆ ಎಂದು ಕೃಷ್ಣ ಬೈರೇಗೌಡ ತಿಳಿಸಿದರು.
ಕೇಂದ್ರ ಸರ್ಕಾರ 2007ರಲ್ಲೇ `ಪೋಷಕರು ಮತ್ತು ಹಿರಿಯ ನಾಗರಿಕರ ನಿರ್ವಹಣೆ ಮತ್ತು ಕಲ್ಯಾಣ ಕಾಯ್ದೆ’ಯನ್ನು ಜಾರಿಗೆ ತಂದಿದೆ. ಆದರೆ, ಈ ಬಗ್ಗೆ ಹಲವರಿಗೆ ಮಾಹಿತಿಯೇ ಇಲ್ಲ. ಈ ಮಾಹಿತಿಯನ್ನು ಪರಿಣಾಮಕಾರಿಯಾಗಿ ಎಲ್ಲರಿಗೂ ತಲುಪಿಸಬೇಕು ಎಂಬ ಉದ್ದೇಶದಿಂದಲೇ ಪರಿಷತ್‌ನಲ್ಲಿ ಈ ಕಾಯ್ದೆಯ ಬಗ್ಗೆ ಉಲ್ಲೇಖಿಸುತ್ತಿದ್ದೇನೆ. ಈ ಕಾಯ್ದೆಯ ಪ್ರಕಾರ ಮಕ್ಕಳು ಅಥವಾ ಸಂಬಂಧಿಕರು ಹಿರಿಯ ನಾಗರಿಕರನ್ನು ಆರೈಕೆ ಮಾಡಬೇಕು. ಔಷಧಿ ಸೇರಿದಂತೆ ಅವರ ಮಾಸಿಕ ಖರ್ಚಿಗೆ ಹಣ ನೀಡಬೇಕು. ಒಂದು ವೇಳೆ ಹಣ ನೀಡದಿದ್ದರೆ ಅಥವಾ ಆರೈಕೆ ಮಾಡಲು ನಿರ್ಲಕ್ಷಿಸಿದರೆ ಹಿರಿಯ ನಾಗರಿಕರು ಸೆಕ್ಷನ್ 09ರ ಅಡಿಯಲ್ಲಿ ಸಂಬಂಧಪಟ್ಟ ಅಧಿಕಾರಿಗಳ ಬಳಿ ದೂರು ಸಲ್ಲಿಸಬಹುದು ಎಂದು ಹೇಳಿದರು.
ಒಂದು ವೇಳೆ ಹಿರಿಯ ನಾಗರಿಕರ ದೂರು ಸಾಬೀತಾದರೆ, ತಂದೆ ತಾಯಿಯಿಂದ ಆಸ್ತಿ ಪಡೆದು ಅವರ ಆರೈಕೆ ಮಾಡದಿದ್ದರೆ, ಸೆಕ್ಷನ್ 23ರಂತೆ ಪೋಷಕರು ತಮ್ಮ ಮಕ್ಕಳ ಅಥವಾ ಸಂಬಂಧಿಕರ ಹೆಸರಿನಲ್ಲಿ ಬರೆದಿರುವ ವಿಲ್ ಅಥವಾ ದಾನಪತ್ರವನ್ನು ರದ್ದುಗೊಳಿಸಿ ಮತ್ತೆ ಪೋಷಕರ ಹೆಸರಿಗೇ ಮರುಸ್ಥಾಪಿಸಲು ಕಾನೂನಿನಲ್ಲಿ ಅವಕಾಶ ಇದೆ. ಈ ಜವಾಬ್ದಾರಿಯನ್ನು ಉಪ ವಿಭಾಗಾಧಿಕಾರಿಗಳಿಗೆ ನೀಡಲಾಗಿದೆ. ಈಗಾಗಲೇ ಉಪ ವಿಭಾಗಾಧಿಕಾರಿಗಳ ಮುಂದೆ ಸಾವಿರಾರು ಪ್ರಕರಣಗಳಿವೆ. ಇದೇ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿ ತಿಂಗಳೂ ಉಪ ವಿಭಾಗಾಧಿಕಾರಿಗಳ ಜೊತೆ ಮಾಸಿಕ ಸಭೆ ನಡೆಸಲಾಗುತ್ತಿದೆ. ಅಲ್ಲದೆ, ಜಿಲ್ಲಾಧಿಕಾರಿಗಳಿಗೆ ಅಪೀಲು ಹೋಗಲೂ ಸಹ ಅರ್ಜಿದಾರರಿಗೆ ಅವಕಾಶ ನೀಡಲಾಗಿದೆ ಎಂದು ಸದನಕ್ಕೆ ಮಾಹಿತಿ ನೀಡಿದರು.
ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 6:01 pm, Wed, 12 March 25




