ಪಿಎಸ್ಐ ನೇಮಕಾತಿ ಅಕ್ರಮ ಪ್ರಕರಣ: ಐಪಿಎಸ್ ಅಮೃತ್ ಪಾಲ್ಗೆ ಜಾಮೀನು
ಹಿರಿಯ ಐಪಿಎಸ್ ಅಧಿಕಾರಿ ಅಮೃತ್ ಪಾಲ್ ಅವರನ್ನು 545 ಪಿಎಸ್ಐ ನೇಮಕಾತಿ ಪರೀಕ್ಷೆಯಲ್ಲಿ ರಿಗ್ಲಿಂಗ್ ಮಾಡಿದ ಆರೋಪದ ಮೇಲೆ ಬಂಧಿಸಲಾಗಿತ್ತು. ಭ್ರಷ್ಟ್ಟಾಚಾರ ನಿಗ್ರಹ ಕಾಯ್ದೆಯಡಿ ಕ್ರಮ ಜರುಗಿಸಲು ರಾಜ್ಯ ಅಪರಾಧ ತನಿಖಾ ದಳಕ್ಕೆ (ಸಿಐಡಿ) ಕೇಂದ್ರ ಸರಕಾರ ಈಗಾಗಲೇ ಅನುಮತಿ ಕೂಡ ನೀಡಿತ್ತು. ಆದರೀಗ ಅಮೃತ್ ಪಾಲ್ ಅವರಿಗೆ ಹೈಕೋರ್ಟ್ ಜಾಮೀನು ಮಂಜೂರು ಮಾಡಿದೆ.
ಬೆಂಗಳೂರು, ಸೆ.25: ಪಿಎಸ್ಐ ನೇಮಕಾತಿಯಲ್ಲಿ ಅಕ್ರಮ (PSI recruitment scam) ನಡೆಸಿದ ಆರೋಪ ಸಂಬಂಧ ಹಿರಿಯ ಐಪಿಎಸ್ ಅಧಿಕಾರಿ ಅಮೃತ್ ಪಾಲ್ (Amrit Pal) ಅವರಿಗೆ ಕರ್ನಾಟಕ ಹೈಕೋರ್ಟ್ ಷರತ್ತು ಬದ್ಧ ಜಾಮೀನು ಮಂಜೂರು ಮಾಡಿದೆ. 5 ಲಕ್ಷ ಮೌಲ್ಯದ ಬಾಂಡ್ ಇಬ್ಬರು ಶ್ಯೂರಿಟಿ ಒದಗಿಸಬೇಕು, ಸಾಕ್ಷಿಗಳ ಮೇಲೆ ಪ್ರಭಾವ ಬೀರಬಾರದು, ಕೋರ್ಟ್ ಆನುಮತಿಯಿಲ್ಲದೇ ವಿದೇಶಕ್ಕೆ ಪ್ರಯಾಣಿಸುವಂತಿಲ್ಲ ಎಂದು ಷರತ್ತು ವಿಧಿಸಿದೆ.
ನೇಮಕಾತಿ ಪ್ರಕರಣ ಸಂಬಂಧ ಕಿರಿಯ ತನಿಖಾಧಿಕಾರಿಗಳು ಅಮೃತ್ ಪಾಲ್ ಅವರನ್ನು ತನಿಖೆ ನಡೆಸುತ್ತಿದ್ದಾರೆ. ಇವರಿಗೆ ಬೆದರಿಕೆ ಹಾಕದಂತೆ ಷರತ್ತು ವಿಧಿಸುವಂತೆ ಎಸ್ಪಿಪಿ ಪ್ರಸನ್ನ ಕುಮಾರ್ ಅವರು ಹೈಕೋರ್ಟ್ಗೆ ಮನವಿ ಮಾಡಿದ್ದರು. ಅದರಂತೆ ತನಿಖಾಧಿಕಾರಿಗಳಿಗೆ ಬೆದರಿಕೆ ಹಾಕದಂತೆ ಷರತ್ತು ಕೋರ್ಟ್ ವಿಧಿಸಿದೆ.
ಇದನ್ನೂ ಓದಿ: ಧಾರವಾಡ ಪ್ರವೇಶಕ್ಕೆ ಷರತ್ತು ಸಡಿಲಿಕೆ ಕೋರಿದ್ದ ಶಾಸಕ ವಿನಯ್ ಕುಲಕರ್ಣಿ ಅರ್ಜಿ ವಜಾಗೊಳಿಸಿದ ಹೈಕೋರ್ಟ್
545 ಪಿಎಸ್‌ಐಗಳ ನೇಮಕಾತಿಗಾಗಿ ಲಿಖಿತ ಪರೀಕ್ಷೆಯು ಅಕ್ಟೋಬರ್ 3, 2021 ರಂದು 92 ಕೇಂದ್ರಗಳಲ್ಲಿ ನಡೆಯಿತು. ಒಟ್ಟು 54,289 ಅಭ್ಯರ್ಥಿಗಳು ಪರೀಕ್ಷೆ ಬರೆದಿದ್ದರು. ಪರೀಕ್ಷೆ ಬರೆದ 52 ಅಭ್ಯರ್ಥಿಗಳು ಸೇರಿದಂತೆ ಹಗರಣಕ್ಕೆ ಸಂಬಂಧಿಸಿದಂತೆ 110 ಜನರನ್ನು ಬಂಧಿಸಲಾಗಿದೆ.
ಈ 52 ಅಭ್ಯರ್ಥಿಗಳು ಯಾವುದೇ ಪೊಲೀಸ್ ನೇಮಕಾತಿಯಲ್ಲಿ ಭಾಗವಹಿಸದಂತೆ ನಿರ್ಬಂಧಿಸಲಾಗಿದೆ. ಹಿರಿಯ ಐಪಿಎಸ್ ಅಧಿಕಾರಿ ಅಮೃತ್ ಪಾಲ್ ಅವರನ್ನು ಪರೀಕ್ಷೆಯಲ್ಲಿ ರಿಗ್ಲಿಂಗ್ ಮಾಡಿದ ಆರೋಪದ ಮೇಲೆ ಬಂಧಿಸಲಾಗಿತ್ತು.
ಇನ್ನು ಪಿಎಸ್‌ಐ ಅಕ್ರಮ ನೇಮಕಾತಿ ಹಗರಣ ಸಂಬಂಧ ಬಂಧಿತ ನೇಮಕಾತಿ ವಿಭಾಗದ ಮಾಜಿ ಮುಖ್ಯಸ್ಥ ಹಾಗೂ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ (ಎಡಿಜಿಪಿ) ಅಮೃತ್ ಪಾಲ್ ವಿರುದ್ಧ ಭ್ರಷ್ಟ್ಟಾಚಾರ ನಿಗ್ರಹ ಕಾಯ್ದೆಯಡಿ ಕ್ರಮ ಜರುಗಿಸಲು ರಾಜ್ಯ ಅಪರಾಧ ತನಿಖಾ ದಳಕ್ಕೆ (ಸಿಐಡಿ) ಕೇಂದ್ರ ಸರಕಾರ ಈಗಾಗಲೇ ಅನುಮತಿ ಕೂಡ ನೀಡಿತ್ತು.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ