
ಬೆಂಗಳೂರು, (ಜುಲೈ 19): ಕಳೆದ ಕೆಲ ದಿನಗಳಿಂದ ಕರ್ನಾಟಕದಲ್ಲಿ ಕೈಕೊಟ್ಟಿದ್ದ ವರುಣ ಶನಿವಾರ ಹಲವೆಡೆ ತಂಪೆರೆದಿದೆ. ಹೌದು.. ರಾಜ್ಯದ ಹಲವು ಜಿಲ್ಲೆಗಳಲ್ಲಿ ವರುಣನ ಸಿಂಚನವಾಗಿದ್ದು, ಮುಂದಿನ ಐದು ದಿನಗಳ (ಜುಲೈ 19ದಿಂದ ಜು.23) ಕಾಲ ರಾಜ್ಯಾದ್ಯಂತ ಅಲ್ಲಲ್ಲಿ ಜೋರಾದ ಗಾಳಿ, ಗುಡುಗು, ಸಿಡಿಲು ಸಹಿತ ಹಗುರದಿಂದ ಸಾಧಾರಣ ಮಳೆಯಾಗಲಿದೆ ಎಂದು ಕರ್ನಾಟಕ ರಾಜ್ಯ ವಿಪತ್ತು ನಿರ್ವಹಣಾ ಕೇಂದ್ರ ತಿಳಿಸಿದೆ. ಕರಾವಳಿ ಜಿಲ್ಲೆಗಳು ಹಾಗೂ ಮಲೆನಾಡಿನ ಹಲವು ಕಡೆಗಳಲ್ಲಿ ಮುಂದಿನ ಎರಡು ದಿನಗಳು ಭಾರಿ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.
ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ, ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಭಾರಿ ಮಳೆಯ ಮುನ್ಸೂಚನೆ ಇದ್ದು, ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಅಲ್ಲದೇ ಕರಾವಳಿ ತೀರದಲ್ಲಿ ಬಿರುಗಾಳಿಯ ವೇಗ ಹೆಚ್ಚಾಗಿರುವುದರಿಂದ ಮೀನುಗಾರರಿಗೆ ಸಮುದ್ರಕ್ಕೆ ಇಳಿಯದಂತೆ ಮುನ್ನೆಚ್ಚರಿಕೆ ನೀಡಲಾಗಿದೆ. ಇನ್ನು ಮಲೆನಾಡು ಜಿಲ್ಲೆಗಳಾದ ಶಿವಮೊಗ್ಗ, ಚಿಕ್ಕಮಗಳೂರು, ಹಾಸನ ಮತ್ತು ಕೊಡಗು ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.
#ಕರ್ನಾಟಕ ರಾಜ್ಯದ ಮುಂದಿನ 5 ದಿನಗಳ #ಮುಂಗಾರು ಮಳೆ #ಮುನ್ಸೂಚನೆ ನಕ್ಷೆಗಳು, ಜಿಲ್ಲಾವಾರು ಎಚ್ಚರಿಕೆಗಳೊಂದಿಗೆ. #KSNDMC #ಎಚ್ಚರಿಕೆವಹಿಸಿ
Next 5 days #SouthwestMonsoon #Rainfall #forecast maps for #Karnataka state with district-wise warnings. Source: @Indiametdept @KarnatakaVarthe #KarnataKaRains pic.twitter.com/TKVsR3LjGQ— Karnataka State Natural Disaster Monitoring Centre (@KarnatakaSNDMC) July 19, 2026
ಉತ್ತರ ಹಾಗೂ ದಕ್ಷಿಣ ಒಳನಾಡು ಜಿಲ್ಲೆಗಳಾದ ಬೆಳಗಾವಿ, ಬಾಗಲಕೋಟೆ, ಬೀದರ್, ಕಲಬುರಗಿ, ಕೊಪ್ಪಳ, ಮತ್ತು ರಾಯಚೂರು ಜಿಲ್ಲೆಗಳಲ್ಲಿ ಗಂಟೆಗೆ 30 ರಿಂದ 40 ಕಿಮೀ ವೇಗದಲ್ಲಿ ಬಲವಾದ ಗಾಳಿ ಬೀಸುವ ಸಾಧ್ಯತೆಯಿದೆ. ಜೊತೆಗೆ ಒಳನಾಡಿನ ಕೆಲವು ಭಾಗಗಳಲ್ಲಿ ಸಾಧಾರಣ ಮಳೆಯಾಗಲಿದ್ದು, ಉಳಿದೆಡೆ ಸಾಮಾನ್ಯ ತಾಪಮಾನ ಇರಲಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಮಾಹಿತಿ ನೀಡಿದೆ.
ಬೆಂಗಳೂರು ಮತ್ತು ಸುತ್ತಮುತ್ತಲಿನ ಜಿಲ್ಲೆಗಳಲ್ಲಿ ಮೋಡಕವಿದ ವಾತಾವರಣ ಇರಲಿದ್ದು, ಬೆಂಗಳೂರು ನಗರ ಮತ್ತು ಗ್ರಾಮಾಂತರ ಪ್ರದೇಶಗಳಲ್ಲಿ ಮುಸ್ಸಂಜೆ ಅಥವಾ ರಾತ್ರಿಯ ವೇಳೆ ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ.