IMD Alert: ಬೆಂಗಳೂರು ಸೇರಿ ಕರ್ನಾಟಕದ ಹಲವೆಡೆ ಜೂನ್ 6ರ ವರೆಗೆ ಮಳೆ ಸಾಧ್ಯತೆ
ಬೆಂಗಳೂರಿನಲ್ಲಿ ಸಾಮಾನ್ಯವಾಗಿ ಮೋಡ ಕವಿದ ಆಕಾಶ ಇರಲಿದ್ದು, ಸಂಜೆ ಅಥವಾ ರಾತ್ರಿಯ ವೇಳೆಗೆ ಜೋರಾದ ಗಾಳಿಯೊಂದಿಗೆ ಒಂದು ಅಥವಾ ಎರಡು ಬಾರಿ ಗುಡುಗು ಸಹಿತ ಮಳೆಯಾಗಬಹುದು ಎಂದು ಹವಾಮಾನ ಇಲಾಖೆಯ ಪ್ರಕಟಣೆ ತಿಳಿಸಿದೆ.
ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರು ಹಾಗೂ ಕರ್ನಾಟಕದ ಕೆಲವು ಭಾಗಗಳಲ್ಲಿ ಜೂನ್ 6 ರ ವರೆಗೆ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಗುರುವಾರ ತಿಳಿಸಿದೆ. ಹವಾಮಾನ ಇಲಾಖೆಯು ಜೂನ್ 1 ರಿಂದ ಜೂನ್ 6 ರ ನಡುವೆ ಬೆಂಗಳೂರಿನಲ್ಲಿ ಗುಡುಗು, ಮಿಂಚು ಮತ್ತು ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ ನೀಡಿದೆ. ಬೆಂಗಳೂರಿನಲ್ಲಿ ಸಾಮಾನ್ಯವಾಗಿ ಮೋಡ ಕವಿದ ಆಕಾಶ ಇರಲಿದ್ದು, ಸಂಜೆ ಅಥವಾ ರಾತ್ರಿಯ ವೇಳೆಗೆ ಜೋರಾದ ಗಾಳಿಯೊಂದಿಗೆ ಒಂದು ಅಥವಾ ಎರಡು ಬಾರಿ ಗುಡುಗು ಸಹಿತ ಮಳೆಯಾಗಬಹುದು ಎಂದು ಹವಾಮಾನ ಇಲಾಖೆಯ ಪ್ರಕಟಣೆ ತಿಳಿಸಿದೆ.
ಹವಾಮಾನ ಇಲಾಖೆಯ ಅಂಕಿಅಂಶಗಳ ಪ್ರಕಾರ, ನಗರದಲ್ಲಿ ಮೇ 30 ಮತ್ತು ಮೇ 31 ರ ನಡುವೆ 65.2 ಮಿಮೀ ಮಳೆ ದಾಖಲಾಗಿದೆ. ಬೆಂಗಳೂರು ನಗರದ ಇತಿಹಾಸದಲ್ಲಿ ಮೇ ತಿಂಗಳಿನಲ್ಲಿ ಸುರಿದ ಮಳೆ ದಾಖಲೆ ಸೃಷ್ಟಿಸಿದ್ದು, 66 ವರ್ಷಗಳ ದಾಖಲೆಯನ್ನು ಮುರಿದಿದೆ.
ಮುಂದಿನ ಐದು ದಿನಗಳವರೆಗೆ ಬೆಂಗಳೂರಿನಲ್ಲಿ ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 32 ಮತ್ತು 21 ಡಿಗ್ರಿ ಸೆಲ್ಸಿಯಸ್ ನಡುವೆ ಇರುತ್ತದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಇದನ್ನೂ ಓದಿ: ಬೆಂಗಳೂರಿನಲ್ಲಿ 66 ವರ್ಷಗಳ ದಾಖಲೆ ಮುರಿದ ಮಳೆ, ಪ್ರವಾಹ ನಿಯಂತ್ರಣಕ್ಕೆ ಬೇಕಿದೆ 600 ಕಿಮೀ ಒಳಚರಂಡಿ
ಜೂನ್ 1 ರಿಂದ ಜೂನ್ 6 ರ ನಡುವೆ ದಕ್ಷಿಣ ಒಳ ಕರ್ನಾಟಕ, ಉತ್ತರ ಒಳ ಕರ್ನಾಟಕ ಮತ್ತು ಕರಾವಳಿ ಕರ್ನಾಟಕದ ಭಾಗಗಳಲ್ಲಿ ಮಳೆಯ ಎಚ್ಚರಿಕೆಯನ್ನು ಸಹ ನೀಡಲಾಗಿದೆ.
ಈ ವರ್ಷ ನೈಋತ್ಯ ಮುಂಗಾರು ವಿಳಂಬವಾಗಿದ್ದು, ಜೂನ್ 4ಕ್ಕೆ ಕೇರಳದಲ್ಲಿ ಆರಂಭವಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿತ್ತು. ನಂತರ ಮುಂಗಾರು ಕರ್ನಾಟಕಕ್ಕೆ ಬರಲಿದೆ.
ಹವಾಮಾನ ಇಲಾಖೆಯ ಪ್ರಕಾರ ನೈರುತ್ಯ ಮುಂಗಾರು ಕರ್ನಾಟಕಕ್ಕೆ ಜೂನ್ ಮೊದಲ ವಾರದಲ್ಲಿ ಬರಬೇಕು. ಆದಾಗ್ಯೂ, ಕೇರಳಕ್ಕೆ ತಡವಾಗಿ ಪ್ರವೇಶಿಸುವ ಕಾರಣ ಕರ್ನಾಟಕದಲ್ಲಿ ಮುಂಗಾರು ಮಳೆ ಪ್ರಾರಂಭವು ಕೆಲವು ದಿನಗಳ ಮಟ್ಟಿಗೆ ವಿಳಂಬವಾಗಬಹುದು ಎನ್ನಲಾಗಿದೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ