ಕಲುಷಿತ ನೀರು ಕುಡಿದು ಅಸ್ವಸ್ಥರಾಗ್ತಿರುವ ಕೇಸ್ ಹೆಚ್ಚಳ: ಬಿಬಿಎಂಪಿ, ಜಲಮಂಡಳಿಗೆ ಡಿಕೆಶಿ ಖಡಕ್ ಸೂಚನೆ
ರಾಜ್ಯದ ಹಲವು ಜಿಲ್ಲೆಗಳಲ್ಲಿ ಕಲುಷಿತ ನೀರು ಕುಡಿದು ಅಸ್ವಸ್ಥರಾಗಿದ್ದಾರೆ. ಕಲುಷಿತ ನೀರು ಕುಡಿದಿದ್ದರಿಂದ ವಿವಿಧ ರೋಗಗಳಿಗೆ ತುತ್ತಾಗುತ್ತಿದ್ದಾರೆ. ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಅಧ್ಯಕ್ಷತೆಯ ಸಭೆಯಲ್ಲಿ ಚರ್ಚೆಯಾಗಿದೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ. ಈ ವಿಚಾರವಾಗಿ ಬಿಬಿಎಂಪಿ ಮುಖ್ಯ ಆಯುಕ್ತರು, ಜಲಮಂಡಳಿ ಅಧ್ಯಕ್ಷರು ಹಾಗೂ ನಗರ ಜಿ.ಪಂ ಸಿಇಒಗೆ ಡಿಸಿಎಂ ಪತ್ರ ಬರೆದಿದ್ದಾರೆ.
ಬೆಂಗಳೂರು, ಮೇ 24: ಕಲುಷಿತ ನೀರು (Contaminated water) ಕುಡಿದು ಅಸ್ವಸ್ಥರಾಗುತ್ತಿರುವ ಪ್ರಕರಣ ಹೆಚ್ಚಳ ಹಿನ್ನೆಲೆ ಬೆಂಗಳೂರಿನಲ್ಲಿ ಮುನ್ನೆಚ್ಚರಿಕೆ ವಹಿಸುವಂತೆ ಬಿಬಿಎಂಪಿ ಮುಖ್ಯ ಆಯುಕ್ತರು, ಜಲಮಂಡಳಿ ಅಧ್ಯಕ್ಷರು ಹಾಗೂ ನಗರ ಜಿ.ಪಂ ಸಿಇಒಗೆ ಡಿಸಿಎಂ ಹಾಗೂ ಬೆಂಗಳೂರು ಅಭಿವೃದ್ಧಿ ಸಚಿವ ಡಿಕೆ ಶಿವಕುಮಾರ್ (DK Shivakumar) ಪತ್ರ ಬರೆದಿದ್ದಾರೆ. ಬಿಬಿಎಂಪಿ ವ್ಯಾಪ್ತಿಯಲ್ಲಿ ಪೂರೈಕೆ ಮಾಡುತ್ತಿರುವ ನೀರನ್ನು ಟೆಸ್ಟ್ ಮಾಡಿ. ಉತ್ತಮ ಗುಣಮಟ್ಟದ ಕುಡಿಯುವ ನೀರನ್ನು ಸರಬರಾಜು ಮಾಡಿ. ಕುಡಿಯುವ ನೀರಿನಿಂದ ಆರೋಗ್ಯ ಸಮಸ್ಯೆ ಉಂಟಾಗದಂತೆ ಕ್ರಮಕೈಗೊಳ್ಳಿ. ನಿರ್ಲಕ್ಷ್ಯವಹಿಸುವ ಅಧಿಕಾರಿಗಳ ವಿರುದ್ಧ ಶಿಸ್ತು ಕ್ರಮ ಜರುಗಿಸಲಾಗುವುದು ಎಂದು ಖಡಕ್ ಎಚ್ಚರಿಕೆ ಕೊಟ್ಟಿದ್ದಾರೆ.
ರಾಜ್ಯದ ಹಲವು ಜಿಲ್ಲೆಗಳಲ್ಲಿ ಕಲುಷಿತ ನೀರು ಕುಡಿದು ಅಸ್ವಸ್ಥರಾಗಿದ್ದಾರೆ. ಕಲುಷಿತ ನೀರು ಕುಡಿದಿದ್ದರಿಂದ ವಿವಿಧ ರೋಗಗಳಿಗೆ ತುತ್ತಾಗುತ್ತಿದ್ದಾರೆ. ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಅಧ್ಯಕ್ಷತೆಯ ಸಭೆಯಲ್ಲಿ ಚರ್ಚೆಯಾಗಿದೆ ಎಂದು ಹೇಳಿದ್ದಾರೆ.
ಪತ್ರದಲ್ಲೇನಿದೆ?
ಕರ್ನಾಟಕ ರಾಜ್ಯದ ಹಲವು ಜಿಲ್ಲೆಗಳಲ್ಲಿ ಕಲುಷಿತ ನೀರು ಕುಡಿಯುವ ನೀರಿನೊಂದಿಗೆ ಸೇರಿರುವುದರಿಂದ ಜನರು ಅಸ್ವಸ್ಥಗೊಂಡು, ವಿವಿಧ ರೀತಿಯ ರೋಗಗಳಿಗೆ ತುತ್ತಾಗುತ್ತಿದ್ದಾರೆ ಎಂದು ಹಲವು ಮಾಧ್ಯಮ ಮತ್ತು ದಿನಪತ್ರಿಕೆಗಳಲ್ಲಿ ಪ್ರಸಾರವಾಗಿರುತ್ತದೆ. ಸದರಿ ವಿಷಯವು ಇಂದು ಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ ಜಿಲ್ಲಾಧಿಕಾರಿಗಳೊಂದಿಗೆ ನಡೆದ ವಿಡಿಯೋ ಸಂವಾದದ ಸಭೆಯಲ್ಲಿ ಚರ್ಚೆಯಾಗಿರುತ್ತದೆ.
ಇದನ್ನೂ ಓದಿ: ಮೈಸೂರಿನಲ್ಲಿ ಕಲುಷಿತ ನೀರು ಸೇವಿಸಿ ಓರ್ವ ಸಾವು: ಮೂವರು ಅಧಿಕಾರಿಗಳು ಅಮಾನತು
ಈ ಹಿನ್ನೆಲೆಯಲ್ಲಿ, ಬೆಂಗಳೂರು ಮಹಾನಗರ ಪಾಲಿಕೆಯ ವ್ಯಾಪ್ತಿಯಲ್ಲಿರುವ ಶುದ್ಧ ಕುಡಿಯುವ ನೀರಿನ ಘಟಕಗಳ ಸ್ಥಳಗಳಿಗೆ ಅಧಿಕಾರಿಗಳು ಖುದ್ದು ಭೇಟಿ ನೀಡಬೇಕು. ನೀರಿನ ಘಟಕಗಳು ಸಮರ್ಪಕವಾಗಿ ಕಾರ್ಯ ನಿರ್ವಹಿಸುತ್ತಿರುವ ಬಗ್ಗೆ ಖಚಿತ ಪಡಿಸಿಕೊಂಡು, ಸದರಿ ಘಟಕದಿಂದ ಸರಬರಾಜು ಆಗುತ್ತಿರುವ ನೀರನ್ನು ಪ್ರಯೋಗಾಲಯದಲ್ಲಿ ಪರೀಕ್ಷಿಸಿ, ಕುಡಿಯಲು ಯೋಗ್ಯವಿರುವ ನೀರು ಉತ್ತಮ ಗುಣಮಟ್ಟದ್ದು ಎಂಬ ಬಗ್ಗೆ ಖಾತ್ರಿ ಪಡಿಸಿಕೊಳ್ಳಬೇಕು.
ಇದನ್ನೂ ಓದಿ: ಸಿಎಂ ಸಿದ್ದರಾಮಯ್ಯ ಕ್ಷೇತ್ರದಲ್ಲಿ ಕಲುಷಿತ ನೀರು ಸೇವಿಸಿ 114 ಮಂದಿ ಅಸ್ವಸ್ಥ, ಮೂವರಿಗೆ ಕಾಲರ
ಬಳಿಕ ಸಾರ್ವಜನಿಕರಿಗೆ ಉತ್ತಮ ಗುಣಮಟ್ಟದ ಕುಡಿಯುವ ನೀರನ್ನು ಸರಬರಾಜು ಮಾಡಲು ಹಾಗೂ ಕುಡಿಯುವ ನೀರಿನಿಂದ ಯಾವುದೇ ಆರೋಗ್ಯ ಸಮಸ್ಯೆ ಉಂಟಾಗದಂತೆ ಸೂಕ್ತ ಕ್ರಮ ಕೈಗೊಳ್ಳಲು ಸೂಚಿಸಿದೆ. ತಪ್ಪಿದಲ್ಲಿ ಸಂಬಂಧಪಟ್ಟ ಅಧಿಕಾರಿಗಳ ವಿರುದ್ಧ ಶಿಸ್ತು ಕ್ರಮ ಜರುಗಿಸಲಾಗುವುದು ಎಂದು ಈ ಮೂಲಕ ತಿಳಿಸಲಾಗಿದೆ.
ವರದಿ: ಈರಣ್ಣ ಬಸವ
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.