ರಾಮಲಿಂಗಾ ರೆಡ್ಡಿ ರಾಜೀನಾಮೆ ಪತ್ರದಲ್ಲಿ ಉಲ್ಲೇಖಿಸಿದ ಕಾರಣ ಏನು? ಇಲ್ಲಿದೆ ನೋಡಿ

ಸಿಎಂ ಡಿಕೆ ಶಿವಕುಮಾರ್ ಸಂಪುಟಕ್ಕೆ ಹಿರಿಯ ನಾಯಕ ರಾಮಲಿಂಗಾ ರೆಡ್ಡಿ ರಾಜೀನಾಮೆ ನೀಡಿದ್ದು, ಪತ್ರದಲ್ಲಿ, ‘ನನ್ನ ಆತ್ಮಸಾಕ್ಷಿಗೆ ವಿರುದ್ಧವಾಗಿ ಕಾರ್ಯನಿರ್ವಹಿಸಲು ಸಾಧ್ಯವಾಗದ ಕಾರಣ ಸಚಿವ ಸ್ಥಾನ ಬಿಡುತ್ತಿದ್ದೇನೆ’ ಎಂದು ಉಲ್ಲೇಖಿಸಿದ್ದಾರೆ. ಕಾಂಗ್ರೆಸ್ ಶಾಸಕ ಹಾಗೂ ಕಾರ್ಯಕರ್ತನಾಗಿ ಮುಂದುವರಿಯುವುದಾಗಿ ಸ್ಪಷ್ಟಪಡಿಸಿದ್ದಾರೆ. ರಾಜೀನಾಮೆ ಪತ್ರದ ವಿವರ ಇಲ್ಲಿದೆ.

ರಾಮಲಿಂಗಾ ರೆಡ್ಡಿ ರಾಜೀನಾಮೆ ಪತ್ರದಲ್ಲಿ ಉಲ್ಲೇಖಿಸಿದ ಕಾರಣ ಏನು? ಇಲ್ಲಿದೆ ನೋಡಿ
ರಾಮಲಿಂಗಾ ರೆಡ್ಡಿ ರಾಜೀನಾಮೆ ಪತ್ರ
Image Credit source: tv9

Updated on: Jun 05, 2026 | 10:32 AM

ಬೆಂಗಳೂರು, ಜೂನ್ 5: ಮುಖ್ಯಮಂತ್ರಿ ಡಿಕೆ ಶಿವಕುಮಾರ್ (DK Shivakumar) ಸಂಪುಟಕ್ಕೆ ಹಿರಿಯ ನಾಯಕ ರಾಮಲಿಂಗಾ ರೆಡ್ಡಿ (Ramalinga Reddy) ನೀಡಿರುವ ದಿಢೀರ್ ರಾಜೀನಾಮೆ ರಾಜ್ಯ ರಾಜಕಾರಣದಲ್ಲಿ ತಲ್ಲಣ ಸೃಷ್ಟಿಸಿದೆ. ಬೆಂಗಳೂರು ನಗರಾಭಿವೃದ್ಧಿ ಖಾತೆ ಕೈತಪ್ಪಿ ಜಲಸಂಪನ್ಮೂಲ ಇಲಾಖೆ ಸಿಕ್ಕಿದ್ದಕ್ಕೆ ತೀವ್ರ ಅಸಮಾಧಾನಗೊಂಡಿದ್ದ ಅವರು, ಶುಕ್ರವಾರ ಬೆಳಿಗ್ಗೆ ಅಧಿಕೃತ ರಾಜೀನಾಮೆ ಪತ್ರವನ್ನು ಮುಖ್ಯಮಂತ್ರಿಗಳಿಗೆ ರವಾನಿಸಿದ್ದಾರೆ.

ರಾಮಲಿಂಗಾ ರೆಡ್ಡಿ ರಾಜೀನಾಮೆ ಪತ್ರದಲ್ಲೇನಿದೆ?

‘ನನಗೆ ತಮ್ಮ ಸಚಿವ ಸಂಪುಟದಲ್ಲಿ ಸಚಿವ ಸ್ಥಾನ ನೀಡಿದ್ದಕ್ಕೆ ತಮಗೂ ಹಾಗೂ ಕಾಂಗ್ರೆಸ್ ಪಕ್ಷಕ್ಕೆ ಧನ್ಯವಾದಗಳು. ನಾನು ನನ್ನ ಆತ್ಮಸಾಕ್ಷಿಗೆ ವಿರುದ್ಧವಾಗಿ ಕಾರ್ಯನಿರ್ವಹಿಸಲು ಸಾಧ್ಯವಾಗದ ಕಾರಣ ಸಚಿವ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸುತ್ತಿದ್ದೇನೆ. ನನ್ನ ರಾಜೀನಾಮೆಯನ್ನು ಅಂಗೀಕರಿಸಬೇಕೆಂದು ಕೋರುತ್ತೇನೆ. ನಾನು ಶಾಸಕನಾಗಿ ಹಾಗೂ ಕಾಂಗ್ರೆಸ್ ಪಕ್ಷದ ಕಾರ್ಯಕರ್ತನಾಗಿ ಮುಂದುವರಿಯುತ್ತೇನೆ’ ಎಂದು ರಾಜೀನಾಮೆ ಪತ್ರದಲ್ಲಿ ರಾಮಲಿಂಗಾ ರೆಡ್ಡಿ ಉಲ್ಲೇಖಿಸಿದ್ದಾರೆ.

ಆತ್ಮಸಾಕ್ಷಿ ಅಸ್ತ್ರ ಬಳಸಿದ ಹಿರಿಯ ನಾಯಕ

ಈ ಹಿಂದೆ ನೀಡಿದ್ದ ಭರವಸೆ ಈಡೇರದಿರುವ ಬಗ್ಗೆ ಸುದ್ದಿಗೋಷ್ಠಿಯಲ್ಲಿ ಅಸಮಾಧಾನ ಹೊರಹಾಕಿರುವ ರಾಮಲಿಂಗಾ ರೆಡ್ಡಿ, ನಾನಾಗಿ ಬೆಂಗಳೂರು ಅಭಿವೃದ್ಧಿ ಖಾತೆ ಕೇಳಿರಲಿಲ್ಲ. ಆದರೂ 2023ರಲ್ಲಿ ಡಿಕೆ ಶಿವಕುಮಾರ್ ಹಾಗೂ ಅವರ ಸಹೋದರ ಡಿಕೆ ಸುರೇಶ್ ನನ್ನ ಮನೆಗೆ ಬಂದು ಭರವಸೆ ನೀಡಿದ್ದರು. ಎರಡೂವರೆ ವರ್ಷದ ಬಳಿಕ ಸಿಎಂ ಆದಾಗ ನಿಮಗೇ ಆ ಖಾತೆಯನ್ನು ಕೊಡುವುದಾಗಿ ಹೇಳಿದ್ದರು. ಆದರೆ, ಇದೀಗ ಬೇರೆ ಖಾತೆ ಕೊಟ್ಟಿದ್ದಾರೆ. ಆತ್ಮಸಾಕ್ಷಿಗೆ ವಿರುದ್ಧವಾಗಿ ನಡೆದುಕೊಳ್ಳಲಾರೆ ಎಂದು ರಾಮಲಿಂಗಾ ರೆಡ್ಡಿ ಹೇಳಿದ್ದಾರೆ. ಅಲ್ಲದೆ, ‘ಆತ್ಮಸಾಕ್ಷಿ’ ವಿಚಾರವನ್ನು ರಾಜೀನಾಮೆ ಪತ್ರದಲ್ಲೂ ಉಲ್ಲೇಖಿಸಿದ್ದಾರೆ.

ಇದನ್ನೂ ಓದಿ: ಸಚಿವ ಸ್ಥಾನಕ್ಕೆ ರಾಮಲಿಂಗಾ ರೆಡ್ಡಿ ರಾಜೀನಾಮೆ, ಡಿಕೆಶಿ ಸಂಪುಟದ ಮೊದಲ ವಿಕೆಟ್ ಪತನ

ಸಚಿವ ಸ್ಥಾನ ತ್ಯಜಿಸಿದರೂ ತಾವು ಕಾಂಗ್ರೆಸ್ ಪಕ್ಷದ ಶಾಸಕನಾಗಿ ಹಾಗೂ ಸಾಮಾನ್ಯ ಕಾರ್ಯಕರ್ತನಾಗಿ ಮುಂದುವರಿಯುವುದಾಗಿ ಪತ್ರದಲ್ಲಿ ಸ್ಪಷ್ಟಪಡಿಸುವ ಮೂಲಕ ಹೈಕಮಾಂಡ್‌ಗೆ ತಮ್ಮ ನಿಷ್ಠೆಯನ್ನು ಸಾಬೀತುಪಡಿಸಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 10:26 am, Fri, 5 June 26

Ganapathi Sharma

ಕೇರಳದ ಕಾಸರಗೋಡು ಜಿಲ್ಲೆಯ ಕನ್ನಡಿಗ, ಪ್ರಸ್ತುತ ಬೆಂಗಳೂರಿನಲ್ಲಿ ವಾಸ. 13 ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದು, ಬರವಣಿಗೆ, ಅನುವಾದದಲ್ಲಿ ಆಸಕ್ತಿ ಮತ್ತು ಪರಿಣತಿ. ಪ್ರಚಲಿತ ವಿದ್ಯಮಾನಗಳು, ರಾಜ್ಯ-ರಾಷ್ಟ್ರ ರಾಜಕೀಯ, ಉದ್ಯಮ, ವೈಯಕ್ತಿಕ ಹಣಕಾಸು ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ, ಒಲವು.

Read More
Follow Us