
ಕಲಬುರಗಿ, ನವೆಂಬರ್ 13: ರಾಜಕೀಯ ಜಿದ್ದಾಜಿದ್ದಿಗೆ ಕಾರಣವಾಗಿದ್ದ ಚಿತ್ತಾಪುರದಲ್ಲಿ ಆರ್‌ಎಸ್‌ಎಸ್ (RSS) ಪಥಸಂಚಲನ ವಿವಾದ ಕೊನೆಗೂ ಇತ್ಯರ್ಥವಾಗಿದೆ. ಎರಡೆರಡು ಬಾರಿ ಶಾಂತಿ ಸಭೆ ಬಳಿಕ ಪಥ ಸಂಚಲನ ನಡೆಸಲು ಜಿಲ್ಲಾಡಳಿತ ಷರತ್ತುಬದ್ಧ ಅನುಮತಿ ನೀಡಿದೆ. ಇದರ ಬೆನ್ನಲ್ಲೇ ಸಚಿವ ಪ್ರಿಯಾಂಕ್ ಖರ್ಗೆ (Priyank Kharge) ಪ್ರತಿಕ್ರಿಯಿಸಿದ್ದು, ಯಾವ ಸಂಘಗಳೇ ಆಗಲಿ ಸಂವಿಧಾನದ ಮುಂದೆ ಯಾರೂ ದೊಡ್ಡವರಲ್ಲ, ಯಾರೂ ನಿಯಮಗಳಿಗೆ ಅತೀತರಲ್ಲ ಎಂದು ವಾಗ್ದಾಳಿ ಮಾಡಿದ್ದಾರೆ.
ಚಿತ್ತಾಪುರದಲ್ಲಿ ಆರ್‌ಎಸ್‌ಎಸ್ ಪಥಸಂಚಲನಕ್ಕೆ ಕೊನೆಗೂ ಗ್ರೀನ್ ಸಿಗ್ನಲ್ ಸಿಕ್ಕಿದೆ. ಈ ಬೆನ್ನಲ್ಲೇ ಸಚಿವ ಪ್ರಿಯಾಂಕ್ ಖರ್ಗೆ ಟ್ವೀಟ್ ಮಾಡಿದ್ದು, ಸಂವಿಧಾನಕ್ಕೆ ತಲೆಬಾಗಿದರೆ ಮಾತ್ರ ಬದುಕು ಸುಂದರ. ಸಂವಿಧಾನಕ್ಕೆ ಸವಾಲು ಹಾಕಿದರೆ ಬದುಕು ದುಸ್ಥರ. ಆರ್‌ಎಸ್‌ಎಸ್ ಎಂಬ ಸಂಘಟನೆಗೆ ಈ ಸತ್ಯದ ಅರಿವಾಗಿದೆ ಎಂದು ಭಾವಿಸಿದ್ದೇನೆ. ಸಂವಿಧಾನ, ಕಾನೂನುಗಳು ನಮಗೆ ಅನ್ವಯಿಸುವುದಿಲ್ಲ ಎಂಬಂತೆ ನಡೆದುಕೊಳ್ಳುತ್ತಿದ್ದ RSS ಗೆ ಈಗ ಸಂವಿಧಾನದ ಶಕ್ತಿ ಅರ್ಥವಾಗಿದೆ ಎಂದು ಕಿಡಿಕಾರಿದ್ದಾರೆ.
ಯಾವ ಸಂಘಗಳೇ ಆಗಲಿ ಸಂವಿಧಾನದ ಮುಂದೆ ಯಾರೂ ದೊಡ್ಡವರಲ್ಲ, ಯಾರೂ ನಿಯಮಗಳಿಗೆ ಅತೀತರಲ್ಲ.
ಸಂವಿಧಾನಕ್ಕೆ ತಲೆಬಾಗಿದರೆ ಮಾತ್ರ ಬದುಕು ಸುಂದರ.
ಸಂವಿಧಾನಕ್ಕೆ ಸವಾಲು ಹಾಕಿದರೆ ಬದುಕು ದುಸ್ಥರ!
ಆರ್‌ಎಸ್‌ಎಸ್ ಎಂಬ ಸಂಘಟನೆಗೆ ಈ ಸತ್ಯದ ಅರಿವಾಗಿದೆ ಎಂದು ಭಾವಿಸಿದ್ದೇನೆ.
ಸಂವಿಧಾನ, ಕಾನೂನುಗಳು ನಮಗೆ ಅನ್ವಯಿಸುವುದಿಲ್ಲ ಎಂಬಂತೆ…— Priyank Kharge / ಪ್ರಿಯಾಂಕ್ ಖರ್ಗೆ (@PriyankKharge) November 13, 2025
ಯಾವುದೇ ಸಂಘಗಳು, ವ್ಯಕ್ತಿಗಳು ಇದನ್ನು ಅರ್ಥೈಸಿಕೊಂಡು ನೀತಿ, ನಿಯಮಗಳಿಗೆ ಬದ್ಧರಾಗಿ ನಡೆಯಬೇಕು. ಸರ್ಕಾರ ಮತ್ತು ಕಲಬುರಗಿ ಜಿಲ್ಲಾಡಳಿತ ರೂಪಿಸಿರುವ ಮಾನದಂಡಗಳನ್ನು ಒಪ್ಪಿ, ನಿಯಮಗಳಿಗೆ ಅನುಸಾರವಾಗಿ ಆರ್‌ಎಸ್‌ಎಸ್ ತಮ್ಮ ಕಾರ್ಯಕ್ರಮ ನಡೆಸಬೇಕು ಇದರ ಹೊರತಾಗಿ ಯಾವುದೇ ಅತಿ ಬುದ್ದಿವಂತಿಕೆಗೂ ಅವಕಾಶವಿಲ್ಲ ಎಂದಿದ್ದಾರೆ.
ಈ ನಿಯಮಗಳ ಮೂಲಕ ಸರ್ಕಾರ ತೋರಿದ ಉದಾರತೆಯನ್ನು, ಕಲಬುರಗಿ ಜಿಲ್ಲಾಡಳಿತ ತೋರಿದ ಸಹನೆಯನ್ನು ಗೌರವಿಸಿ ತಮ್ಮ ಕಾರ್ಯಕ್ರಮವನ್ನು ಪೂರೈಸಿಕೊಳ್ಳಬೇಕು. ಜೈ ಸಂವಿಧಾನ ಎಂದು ಸಚಿವ ಪ್ರಿಯಾಂಕ್ ಖರ್ಗೆ ಟ್ವೀಟ್ ಮಾಡಿದ್ದಾರೆ.
ಇದನ್ನೂ ಓದಿ: Chittapur RSS March: ಚಿತ್ತಾಪುರದಲ್ಲಿ ಆರ್‌ಎಸ್‌ಎಸ್ ಪಥಸಂಚಲನಕ್ಕೆ ಗ್ರೀನ್ ಸಿಗ್ನಲ್
ಸಚಿವ ಪ್ರಿಯಾಂಕ್ ಖರ್ಗೆ ಕ್ಷೇತ್ರ ಚಿತ್ತಾಪುರದಲ್ಲಿ ಕಗ್ಗಂಟಾಗಿತ್ತು. ಪಥಸಂಚಲನ ವಿಚಾರದಲ್ಲಿ ಭಾರೀ ಹೈಡ್ರಾಮಾವೇ ನಡೆದಿತ್ತು. ಕೋರ್ಟ್ ಮೆಟ್ಟಿಲೇರಿತ್ತು. ಇದೀಗ ಚಿತ್ತಾಪುರದಲ್ಲಿ RSS ಪಥಸಂಚಲನಕ್ಕೆ ಕೊನೆಗೂ ಗ್ರೀನ್ ಸಿಗ್ನಲ್ ಸಿಕ್ಕಿದೆ. ಇದೇ ನವೆಂಬರ್ 16ರಂದು ಪಥಸಂಚಲನಕ್ಕೆ ಷರತ್ತುಬದ್ಧ ಅನುಮತಿ ಕೊಡಲಾಗಿದೆ.
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.