
ಕಲಬುರಗಿ, ಮೇ 04: ಇತ್ತೀಚಿಗೆ ನಡೆದ ಸಿಇಟಿ ಪರೀಕ್ಷೆ (CET Exam) ಬರೆಯಲು ಬಂದಿದ್ದ ಬ್ರಾಹ್ಮಣ ವಿದ್ಯಾರ್ಥಿಗಳ (Brmhan Students) ಜನಿವಾರ (Janivar) ತೆಗೆಸಲಾಗಿತ್ತು. ಈ ಪ್ರಕರಣ ಮಾಸುವ ಮುನ್ನವೇ ನೀಟ್ (NEET) ಪರೀಕ್ಷೆಯಲ್ಲೂ ಅಧಿಕಾರಿಗಳು ಬ್ರಾಹ್ಮಣ ವಿದ್ಯಾರ್ಥಿಯ ಜನಿವಾರ ತೆಗೆಸಿದ್ದಾರೆ. ಕಲಬುರಗಿಯ ಸೇಂಟ್ ಮೇರಿ ಶಾಲೆಯಲ್ಲಿ ನಡೆದ ನೀಟ್ ಪರೀಕ್ಷೆ ಬರೆಯಲು ಬಂದ ವಿದ್ಯಾರ್ಥಿ ಶ್ರೀಪಾದ್ ಪಾಟೀಲ್ ಅವರ ಜನಿವಾರವನ್ನು ಅಧಿಕಾರಿಗಳು ತೆಗೆಸಿ, ಪರೀಕ್ಷೆ ಬರೆಯಲು ಅವಕಾಶ ನೀಡಿದ್ದಾರೆ.
ಪರೀಕ್ಷಾ ಕೇಂದ್ರದ ಒಳಗೆ ಹೋಗುವಾಗ ಶ್ರೀಪಾದ್ ಪಾಟೀಲ್ ಅವರಿಗೆ ಜನಿವಾರ ತೆಗೆಯುವಂತೆ ಅಧಿಕಾರಿಗಳು ಸೂಚನೆ ನೀಡಿದ್ದಾರೆ. ಸೂಚನೆಯಂತೆ ಶ್ರೀಪಾದ್ ಪಾಟೀಲ್ ಅವರು ಜನಿವಾರ ತೆಗೆದು ಪರೀಕ್ಷಾ ಕೇಂದ್ರಕ್ಕೆ ತೆರಳಿ, ಪರೀಕ್ಷೆ ಬರೆದಿದ್ದಾರೆ. ಈ ಘಟನೆಯನ್ನು ಖಂಡಿಸಿ ಪರೀಕ್ಷಾ ಕೇಂದ್ರದ ಮುಂದೆ ಬ್ರಾಹ್ಮಣ ಸಮಾಜ ಪ್ರತಿಭಟನೆ ನಡೆಸಿತು. ಜನಿವಾರ ತೆಗೆಸಿದ ಅಧಿಕಾರಿಯನ್ನು ಅಮಾನತು ಮಾಡುವಂತೆ ಬ್ರಾಹ್ಮಣ ಸಮುದಾಯ ಒತ್ತಾಯಿಸಿದೆ.
ಇತ್ತೀಚಿಗೆ ನಡೆದ ಸಿಇಟಿ ಪರೀಕ್ಷೆಗೆ ಬರೆಯಲು ಬಂದ ಬ್ರಾಹ್ಮಣ ವಿದ್ಯಾರ್ಥಿಗಳ ಜನಿವಾರವನ್ನು ಶಿವಮೊಗ್ಗ, ಬೀದರ್ ಮತ್ತು ಧಾರವಾಡ ಪರೀಕ್ಷಾ ಕೇಂದ್ರಗಳಲ್ಲಿ ತೆಗೆಸಲಾಗಿತ್ತು. ಈ ಪ್ರಕರಣ ರಾಜ್ಯಾದ್ಯಂತ ಭಾರೀ ಚರ್ಚೆಗೆ ಮತ್ತು ಆಕ್ರೋಶಕ್ಕೆ ಕಾರಣವಾಗಿತ್ತು. ಜನಿವಾರ ಹಾಕಿದ್ದಾರೆಂಬ ಕಾರಣಕ್ಕೆ ಪರೀಕ್ಷೆ ಬರೆಯಲು ಅವಕಾಶ ನೀಡದೆ ವಿದ್ಯಾರ್ಥಿಗಳ ಭವಿಷ್ಯಕ್ಕೆ ಸಂಕಷ್ಟ ತಂದಿದ್ದಕ್ಕೆ ವಿರೋಧ ವ್ಯಕ್ತವಾಗಿತ್ತು.
ಶಿವಮೊಗ್ಗದಲ್ಲಿ ಸಿಇಟಿ ಪರೀಕ್ಷೆ ಬರೆಯಲು ಆಗಮಿಸಿದ್ದ ವಿದ್ಯಾರ್ಥಿಯ ಜನಿವಾರ ಮತ್ತು ಕೈಗೆ ಕಟ್ಟಿದ್ದ ಕಾಶಿ ದಾರವನ್ನು ತೆಗೆಸಿ ಅಧಿಕಾರಿಗಳು ಕಸದ ಬುಟ್ಟಿಗೆ ಎಸೆದಿದ್ದರು. ಬೀದರ್‌ನಲ್ಲಿ ಜನಿವಾರ ಹಾಕಿದ ವಿದ್ಯಾರ್ಥಿಗೆ ಪರೀಕ್ಷೆ ಬರೆಯಲು ಅವಕಾಶ ಮಾಡಿಕೊಟ್ಟಿರಲಿಲ್ಲ. ಅಧಿಕಾರಿಗಳ ಈ ಕ್ರಮದ ವಿರುದ್ಧ ಬ್ರಾಹ್ಮಣ ಮಹಾಸಭಾ ತೀವ್ರ ಆಕ್ಷೇಪ ವ್ಯಕ್ತಪಡಿಸಿತ್ತು.
ಇದನ್ನೂ ಓದಿ: ಸಿಇಟಿ ಅಭ್ಯರ್ಥಿಗಳ ಜನಿವಾರ ತೆಗೆಸಿದ ಪ್ರಕರಣ; ಅಧಿಕಾರಿಗಳದ್ದೇ ತಪ್ಪೆಂದು ವರದಿ ಸಲ್ಲಿಸಿದ ಡಿಸಿ
ಜನಿವಾರ ತೆಗೆಯದ್ದಕ್ಕೆ ಪರೀಕ್ಷೆಗೆ ಅವಕಾಶ ನೀಡದ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದಿಂದ ದೂರು ದಾಖಲಿಸಿಕೊಳ್ಳಲಾಗಿದೆ. ಈ ಘಟನೆ ಬಗ್ಗೆ ಸ್ವಯಂಪ್ರೇರಿತ ದೂರು ದಾಖಲಿಸಿ ತನಿಖೆ ನಡೆಸಲಾಗುತ್ತಿದೆ. ಬೀದರ್ನ ಖಾಸಗಿ ಕಾಲೇಜಿನಲ್ಲಿ ನಿನ್ನೆ ನಡೆದಿದ್ದ ಘಟನೆಗೆ ಸಂಬಂಧಿಸಿದಂತೆ ದೂರು ದಾಖಲಿಸಿಕೊಳ್ಳಲಾಗಿದೆ.
ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 4:09 pm, Sun, 4 May 25