ಕನ್ನಡಿಗರಿಗೆ ಉದ್ಯೋಗ ಕೊಡಬೇಕು ನಿಜ, ಮೊದಲು ಶಿಕ್ಷಣ-ಕೌಶಲ ಸುಧಾರಿಸಿ! ಸಿಎಂ ಸಂದೇಶಕ್ಕೆ ಮೋಹನ್ ದಾಸ್ ಪೈ ಪ್ರತಿಕ್ರಿಯೆ

ಕನ್ನಡಿಗರಿಗೆ ಉದ್ಯೋಗಾವಕಾಶಗಳಲ್ಲಿ ಅನ್ಯಾಯವಾಗಲು ಅವಕಾಶ ನೀಡುವುದಿಲ್ಲ ಎಂದು ಸಿಎಂ ಡಿಕೆ ಶಿವಕುಮಾರ್ ಹೇಳಿದ ಬೆನ್ನಲ್ಲೇ ಉದ್ಯಮಿ ಮೋಹನ್ ದಾಸ್ ಪೈ ಅವರು ಕಲ್ಯಾಣ ಕರ್ನಾಟಕದ ಉನ್ನತ ಶಿಕ್ಷಣದತ್ತ ಗಮನ ಸೆಳೆದಿದ್ದಾರೆ. ಕಡಿಮೆ GER, ಸಾಫ್ಟ್ ಸ್ಕಿಲ್ಸ್ ಕೊರತೆ, ಸರ್ಕಾರಿ ಕಾಲೇಜುಗಳಲ್ಲಿ ಅತಿಥಿ ಉಪನ್ಯಾಸಕರ ಅವಲಂಬನೆ ಕುರಿತು ಅವರು ಪ್ರಸ್ತಾಪಿಸಿದ್ದಾರೆ.

ಕನ್ನಡಿಗರಿಗೆ ಉದ್ಯೋಗ ಕೊಡಬೇಕು ನಿಜ, ಮೊದಲು ಶಿಕ್ಷಣ-ಕೌಶಲ ಸುಧಾರಿಸಿ! ಸಿಎಂ ಸಂದೇಶಕ್ಕೆ ಮೋಹನ್ ದಾಸ್ ಪೈ ಪ್ರತಿಕ್ರಿಯೆ
ಕನ್ನಡಿಗರ ಉದ್ಯೋಗದ ಚರ್ಚೆ, ಸಿಎಂ ಹಾಗೂ ಮೋಹನ್ ದಾಸ್ ಪೈ

Updated on: Oct 26, 2026 | 10:53 AM

ಮುಖ್ಯಾಂಶಗಳು

  • ಕನ್ನಡಿಗರ ಉದ್ಯೋಗದ ಚರ್ಚೆ ನಡುವೆ ಶಿಕ್ಷಣದತ್ತ ಪೈ ಗಮನ
  • ಕಲ್ಯಾಣ ಕರ್ನಾಟಕದ ಯುವಕರ ಕೌಶಲ ಹೆಚ್ಚಿಸಲು ಮನವಿ
  • ಕಾಯಂ ಉಪನ್ಯಾಸಕರು, ಸಂಶೋಧನೆಗೆ ಅನುದಾನ ನೀಡಲು ಆಗ್ರಹ

ಬೆಂಗಳೂರು, ಅಕ್ಟೋಬರ್ 26: ಬೆಂಗಳೂರಿನ ಐಟಿ ಕಂಪನಿಗಳಲ್ಲಿ ಕನ್ನಡಿಗರಿಗೆ ಉದ್ಯೋಗಾವಕಾಶಗಳಲ್ಲಿ ಅನ್ಯಾಯವಾಗುತ್ತಿದೆ ಎಂಬ ದೂರುಗಳ ಕುರಿತು ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಪ್ರತಿಕ್ರಿಯಿಸಿದ ಬೆನ್ನಲ್ಲೇ, ಉದ್ಯಮಿ ಮೋಹನ್ ದಾಸ್ ಪೈ ಅವರು ಉನ್ನತ ಶಿಕ್ಷಣದ ಗುಣಮಟ್ಟದ ಬಗ್ಗೆ ಸರ್ಕಾರದ ಗಮನ ಸೆಳೆದಿದ್ದಾರೆ. ಕನ್ನಡಿಗರನ್ನು ಖಾಸಗಿ ಸಂಸ್ಥೆಗಳು ಉದ್ದೇಶಪೂರ್ವಕವಾಗಿ ಕಡೆಗಣಿಸಿದರೆ ಸೂಕ್ತ ಕ್ರಮ ಕೈಗೊಳ್ಳುವುದಾಗಿ ಸಿಎಂ ನೀಡಿದ ಸಂದೇಶಕ್ಕೆ ಪ್ರತಿಯಾಗಿ, ಯುವಕರಿಗೆ ಉತ್ತಮ ಶಿಕ್ಷಣ ಮತ್ತು ಕೌಶಲ ತರಬೇತಿ ನೀಡುವ ಅಗತ್ಯವನ್ನು ಅವರು ಒತ್ತಿಹೇಳಿದ್ದಾರೆ.

ಕನ್ನಡಿಗರಿಗೆ ಉತ್ತಮ ಶಿಕ್ಷಣ, ಕೌಶಲ ತರಬೇತಿ ನೀಡಿ ಎಂದ ಪೈ

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಉದ್ದೇಶಿಸಿ ಎಕ್ಸ್‌ನಲ್ಲಿ ಸಂದೇಶ ಪ್ರಕಟಿಸಿರುವ ಮೋಹನ್ ದಾಸ್ ಪೈ, ವಿಶೇಷವಾಗಿ ಕಲ್ಯಾಣ ಕರ್ನಾಟಕ ಭಾಗದ ಯುವಕರ ಉನ್ನತ ಶಿಕ್ಷಣದ ಬಗ್ಗೆ ಗಮನ ಹರಿಸುವಂತೆ ಮನವಿ ಮಾಡಿದ್ದಾರೆ. ಕಲ್ಯಾಣ ಕರ್ನಾಟಕದಲ್ಲಿ ಉನ್ನತ ಶಿಕ್ಷಣದ ಒಟ್ಟು ದಾಖಲಾತಿ ಅನುಪಾತ (GER) ಕಡಿಮೆಯಿದೆ. ಅಲ್ಲಿನ ಯುವಕರಲ್ಲಿ ಸಾಫ್ಟ್ ಸ್ಕಿಲ್ಸ್‌ ಕೂಡ ಹೆಚ್ಚಿಸುವ ಅಗತ್ಯವಿದೆ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ. ಯುವಕರಿಗೆ ಉತ್ತಮ ತರಬೇತಿ ನೀಡುವ ಮೂಲಕ ಉದ್ಯೋಗಕ್ಕೆ ಅಗತ್ಯವಾದ ಕೌಶಲಗಳನ್ನು ಬೆಳೆಸಬೇಕು ಎಂದು ಸಿಎಂಗೆ ಸಲಹೆ ನೀಡಿದ್ದಾರೆ.

ಸರ್ಕಾರಿ ಕಾಲೇಜುಗಳಲ್ಲಿ ಶೇ 60ರಿಂದ 70ಕ್ಕಿಂತ ಹೆಚ್ಚು ಬೋಧಕ ಸಿಬ್ಬಂದಿ ಅತಿಥಿ ಉಪನ್ಯಾಸಕರಾಗಿದ್ದಾರೆ ಎಂಬ ವರದಿಗಳನ್ನು ಉಲ್ಲೇಖಿಸಿರುವ ಪೈ, ಕಾಲೇಜುಗಳಲ್ಲಿ ಕಾಯಂ ಬೋಧಕ ಸಿಬ್ಬಂದಿಯನ್ನು ನೇಮಿಸುವಂತೆ ಆಗ್ರಹಿಸಿದ್ದಾರೆ. ವಿಶ್ವವಿದ್ಯಾಲಯಗಳಲ್ಲಿ ಸಂಶೋಧನೆಗೆ ಹೆಚ್ಚಿನ ಅನುದಾನ ನೀಡಬೇಕು ಎಂದೂ ಹೇಳಿದ್ದಾರೆ.

ಕೃತಕ ಬುದ್ಧಿಮತ್ತೆ (AI) ತಂತ್ರಜ್ಞಾನ ವೇಗವಾಗಿ ಬೆಳೆಯುತ್ತಿರುವ ಸಂದರ್ಭದಲ್ಲಿ, ಯುವಕರಿಗೆ ಉತ್ತಮ ಗುಣಮಟ್ಟದ ಶಿಕ್ಷಣ, ಸಂಶೋಧನಾ ಅವಕಾಶಗಳು ಮತ್ತು ಉದ್ಯೋಗಕ್ಕೆ ಪೂರಕವಾದ ಕೌಶಲಗಳನ್ನು ಒದಗಿಸುವುದೇ ಹೆಚ್ಚಿನ ಸಂಖ್ಯೆಯಲ್ಲಿ ನುರಿತ ಮಾನವ ಸಂಪನ್ಮೂಲವನ್ನು ಸೃಷ್ಟಿಸುವ ಮಾರ್ಗ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.

ಮೋಹನ್ ದಾಸ್ ಪೈ ಎಕ್ಸ್ ಸಂದೇಶ


ಬೆಂಗಳೂರಿನ ಐಟಿ ಕಂಪನಿಗಳಲ್ಲಿ ಕನ್ನಡ ಭಾಷೆಯಲ್ಲಿ ಮಾತನಾಡುವ ಅಥವಾ ಕನ್ನಡವನ್ನು ಮಾತೃಭಾಷೆಯಾಗಿ ಹೊಂದಿರುವ ಅಭ್ಯರ್ಥಿಗಳ ರೆಸ್ಯೂಮ್‌ಗಳನ್ನು ಕಡೆಗಣಿಸಲಾಗುತ್ತಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಈ ಚರ್ಚೆ ಆರಂಭವಾಗಿತ್ತು. ಈ ಕುರಿತು ಯುವತಿಯೊಬ್ಬರು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿದ್ದರು. ಆ ಪೋಸ್ಟ್ ಚರ್ಚೆಗೆ ಗ್ರಾಸವಾಗಿತ್ತು. ಇದಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಭಾನುವಾರ ಎಕ್ಸ್​​ನಲ್ಲಿ ಸಂದೇಶ ಪ್ರಕಟಿಸಿ, ಕನ್ನಡಿಗರ ಹಕ್ಕು, ಗೌರವ ಮತ್ತು ಉದ್ಯೋಗಾವಕಾಶಗಳನ್ನು ಕಡೆಗಣಿಸಲು ಸರ್ಕಾರ ಅವಕಾಶ ನೀಡುವುದಿಲ್ಲ ಎಂದು ಹೇಳಿದ್ದರು. ಯಾವುದೇ ಖಾಸಗಿ ಸಂಸ್ಥೆ ಉದ್ದೇಶಪೂರ್ವಕವಾಗಿ ಕನ್ನಡಿಗರನ್ನು ಕಡೆಗಣಿಸಿರುವುದು ಕಂಡುಬಂದರೆ ಸೂಕ್ತ ಕ್ರಮ ಕೈಗೊಳ್ಳುವುದಾಗಿ ತಿಳಿಸಿದ್ದರು.

ಇದನ್ನೂ ಓದಿ: ‘ಬೆಂಗಳೂರಿನ ಐಟಿ ಕಂಪನಿಗಳಲ್ಲಿ ಕನ್ನಡಿಗರಿಗೆ ಅನ್ಯಾಯವಾಗಲು ಬಿಡುವುದಿಲ್ಲ’; ಸಿಎಂ ಡಿಕೆ ಶಿವಕುಮಾರ್ ಎಚ್ಚರಿಕೆ

ಇದಕ್ಕೆ ಪ್ರತಿಕ್ರಿಯೆಯಾಗಿ ಮೋಹನ್ ದಾಸ್ ಪೈ ಅವರು ಉದ್ಯೋಗಾವಕಾಶಗಳ ವಿಚಾರದ ಜತೆಗೆ ಶಿಕ್ಷಣದ ಗುಣಮಟ್ಟ, ಕೌಶಲ ಅಭಿವೃದ್ಧಿ, ಕಾಯಂ ಉಪನ್ಯಾಸಕರ ನೇಮಕ ಮತ್ತು ಸಂಶೋಧನೆಗೆ ಅನುದಾನ ನೀಡುವ ಅಗತ್ಯವನ್ನು ಪ್ರಸ್ತಾಪಿಸಿದ್ದಾರೆ. ಕನ್ನಡಿಗರಿಗೆ ಉದ್ಯೋಗಾವಕಾಶಗಳು ಹೆಚ್ಚಬೇಕಾದರೆ, ಯುವಕರಿಗೆ ಉತ್ತಮ ಶಿಕ್ಷಣ ಮತ್ತು ಉದ್ಯಮಕ್ಕೆ ಬೇಕಾದ ಕೌಶಲಗಳನ್ನು ಒದಗಿಸುವುದೂ ಮುಖ್ಯ ಎಂಬ ಸಂದೇಶವನ್ನು ಅವರು ಮುಂದಿಟ್ಟಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 10:48 am, Mon, 26 October 26

ಗಣಪತಿ ಶರ್ಮಾ

ಕೇರಳದ ಕಾಸರಗೋಡು ಮೂಲದ ಕನ್ನಡಿಗ, ಪ್ರಸ್ತುತ ಬೆಂಗಳೂರಿನಲ್ಲಿ ವಾಸ. 14 ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದು, ವರದಿಗಾರಿಕೆ ಅನುಭವದ ಜತೆಗೆ ಬರವಣಿಗೆ, ಅನುವಾದದಲ್ಲಿ ಆಸಕ್ತಿ ಮತ್ತು ಪರಿಣತಿ. ಪ್ರಚಲಿತ ವಿದ್ಯಮಾನಗಳು, ರಾಜ್ಯ-ರಾಷ್ಟ್ರ ರಾಜಕೀಯ, ಉದ್ಯಮ, ವೈಯಕ್ತಿಕ ಹಣಕಾಸು ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ, ಒಲವು. ವಿಜಯ ಕರ್ನಾಟಕ, ಸಮಯ ನ್ಯೂಸ್ ಟಿವಿ, ವಿಜಯವಾಣಿ, ಪ್ರಜಾವಾಣಿ ಪತ್ರಿಕೆಗಳು ಹಾಗೂ ಡಿಜಿಟಲ್ ಮೀಡಿಯಾದಲ್ಲಿ ಕೆಲಸ ಮಾಡಿದ ಅನುಭವ. 2022 ರಿಂದ ಟಿವಿ9 ಕನ್ನಡ ಡಿಜಿಟಲ್​ನಲ್ಲಿ ಕಾರ್ಯನಿರ್ವಹಣೆ.

Read More
Loading...
Unable to load recommendations.
Follow Us