2nd PUC Results 2021: ದ್ವಿತೀಯ ಪಿಯುಸಿ ಅಂಕ ನಿಗದಿ ಹೇಗೆ? ವಿದ್ಯಾರ್ಥಿಗಳೇ, ತಪ್ಪದೇ ಈ ಸುದ್ದಿ ಓದಿ
Karnataka 2nd PUC Results 2021: ವಿದ್ಯಾರ್ಥಿಯ ಪ್ರತಿಭೆಗೆ ಅನುಗುಣವಾಗಿ ಫಲಿತಾಂಶಗಳನ್ನು ದೊರಕಿಸಲು ಪ್ರಾಮಾಣಿಕ ಪ್ರಯತ್ನ ಮಾಡಲಾಗಿದೆ. ಒಂದು ವೇಳೆ ಘೋಷಿತ ಫಲಿತಾಂಶದಿಂದ ಪಡೆದ ಅಂಕಗಳು ತೃಪ್ತಿಕರವೆನಿಸದಿದ್ದಲ್ಲಿ ಅಂತಹ ಅಭ್ಯರ್ಥಿಗಳು ಮುಂದಿನ ದಿನಗಳಲ್ಲಿ ಪದವಿಪೂರ್ವ ಶಿಕ್ಷಣ ಇಲಾಖೆ ನಡೆಸುವ ದ್ವಿತೀಯ ಪಿಯುಸಿ ಪರೀಕ್ಷೆಗೆ ಹಾಜರಾಗಲು ಅವಕಾಶ ಕಲ್ಪಿಸಲಾಗಿದೆ.
ಬೆಂಗಳೂರು: ಕೊವಿಡ್ ಕಾರಣ ದ್ವಿತೀಯ ಪಿಯು ಪರೀಕ್ಷೆ ರದ್ದಾಗಿದ್ದ ಕಾರಣ ಪಿಯುಸಿ ಫಲಿತಾಂಶ ಘೋಷಣೆಯ ಮಾರ್ಗಸೂಚಿ ಪ್ರಕಟವಾಗಿದೆ. ಪ್ರಥಮ ಪಿಯುಸಿ ಮತ್ತು ಎಸ್ಎಸ್ಎಲ್ಸಿಯಲ್ಲಿ ಪಡೆದ ಅಂಕಗಳ ಆಧಾರದ ಮೇಲೆ ದ್ವಿತೀಯ ಪಿಯು ಅಂಕ ನಿಗದಿಗೊಳಿಸಲು ತೀರ್ಮಾನಿಸಲಾಗಿದೆ. ಜತೆಗೆ ದ್ವಿತೀಯ ಪಿಯುಸಿ ಶೈಕ್ಷಣಿಕ ಚಟುವಟಿಕೆಗಳಿಗೆ ನಿಗದಿಪಡಿಸಿದ ಅಂಕಗಳು ಮತ್ತು ಕೃಪಾಂಕಗಳ ಆಧಾರದ ಮೇಲೆ ಅಂಕಗಳನ್ನು ನಿಗದಿಪಡಿಸಿ ಅತಿ ಶೀಘ್ರದಲ್ಲಿಯೇ ಫಲಿತಾಂಶ ಘೋಷಿಸಲಾಗುವುದು ಎಂದು ಪ್ರಾಥಂಇಕ ಮತ್ತು ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್ ತಿಳಿಸಿದ್ದಾರೆ.
ವಿದ್ಯಾರ್ಥಿಗಳ ಹಿತವನ್ನು ಗಮನದಲ್ಲಿಟ್ಟುಕೊಂಡು ಮಾರ್ಗದರ್ಶಿ ಸೂತ್ರಗಳನ್ನು ರಚಿಸಲಾಗಿದೆ. ವಿದ್ಯಾರ್ಥಿಯ ಪ್ರತಿಭೆಗೆ ಅನುಗುಣವಾಗಿ ಫಲಿತಾಂಶಗಳನ್ನು ದೊರಕಿಸಲು ಪ್ರಾಮಾಣಿಕ ಪ್ರಯತ್ನ ಮಾಡಲಾಗಿದೆ. ಒಂದು ವೇಳೆ ಘೋಷಿತ ಫಲಿತಾಂಶದಿಂದ ಪಡೆದ ಅಂಕಗಳು ತೃಪ್ತಿಕರವೆನಿಸದಿದ್ದಲ್ಲಿ ಅಂತಹ ಅಭ್ಯರ್ಥಿಗಳು ಮುಂದಿನ ದಿನಗಳಲ್ಲಿ ಪದವಿಪೂರ್ವ ಶಿಕ್ಷಣ ಇಲಾಖೆ ನಡೆಸುವ ದ್ವಿತೀಯ ಪಿಯುಸಿ ಪರೀಕ್ಷೆಗೆ ಹಾಜರಾಗಲು ಅವಕಾಶ ಕಲ್ಪಿಸಲಾಗಿದೆ. ಈ ವರ್ಷ ದ್ವಿತೀಯ ಪಿಯುಸಿ ಪರೀಕ್ಷೆ ತೆಗೆದುಕೊಳ್ಳುವ ಖಾಸಗಿ ಅಭ್ಯರ್ಥಿಗಳಿಗೆ ಮುಂದಿನ ದಿನಗಳಲ್ಲಿ ಪರೀಕ್ಷೆ ನಡೆಸಿ ಫಲಿತಾಂಶ ಒದಗಿಸಲಾಗುತ್ತದೆ ಎಂದು ಸಚಿವ ಎಸ್. ಸುರೇಶ್ ಕುಮಾರ್ ಮಾಹಿತಿ ನೀಡಿದ್ದಾರೆ.
2nd PU Repeaters Exam 2021: ದ್ವಿತೀಯ ಪಿಯುಸಿ ರಿಪೀಟರ್ಸ್ ಪರೀಕ್ಷೆ ಇಲ್ಲದೇ ಪಾಸ್; ಹೈಕೋರ್ಟ್‌ಗೆ ತಿಳಿಸಿದ ಸರ್ಕಾರ ದ್ವಿತೀಯ ಪಿಯುಸಿ ರಿಪೀಟರ್ಸ್ಗೆ ರಾಜ್ಯ ಸರ್ಕಾರ ಭರ್ಜರಿ ಸಿಹಿ ಸುದ್ದಿ ನೀಡಿದ್ದು, ಎಲ್ಲಾ ರಿಪೀಟರ್ಸ್ ವಿದ್ಯಾರ್ಥಿಗಳನ್ನೂ ಪಾಸ್ ಮಾಡಲಾಗುವುದು ಎಂದು ಹೈಕೋರ್ಟ್‌ಗೆ ತಿಳಿಸಿದೆ. ಶೇ.35ರಷ್ಟು ಅಂಕ ನೀಡಿ ಎಲ್ಲ ರಿಪೀಟರ್ಸ್ ವಿದ್ಯಾರ್ಥಿಗಳನ್ನೂ ತೇರ್ಗಡೆ ಎಂದು ಘೋಷಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಶೇ.35 ರ ಜೊತೆ ಶೇ.5 ರಷ್ಟು ಗ್ರೇಸ್ ಮಾರ್ಕ್ಸ್ ನೀಡಲು ನಿರ್ಧಾರ ಕೈಗೊಳ್ಳಲಾಗಿದೆ.
ಆದರೆ ದ್ವಿತೀಯ ಪಿಯುಸಿ ಖಾಸಗಿ ವಿದ್ಯಾರ್ಥಿಗಳಿಗೆ ಪರೀಕ್ಷೆ ನಡೆಸಲು ಸರ್ಕಾರ ನಿರ್ಧರಿಸಿದೆ. ಅಗಸ್ಟ್ 31ರೊಳಗೆ ಖಾಸಗಿ ವಿದ್ಯಾರ್ಥಿಗಳಿಗೆ ಪರೀಕ್ಷೆ ನಡೆಸಿ, ಸೆಪ್ಟೆಂಬರ್ 20ರೊಳಗೆ ಫಲಿತಾಂಶ ಪ್ರಕಟಿಸಲು ಹೈಕೋರ್ಟ್ ಸೂಚನೆ ನೀಡಿದೆ. ಕೊವಿಡ್ ಮಾರ್ಗಸೂಚಿ ಅನುಸರಿಸಿ ಪರೀಕ್ಷೆ ನಡೆಸಲು ಶಿಕ್ಷಣ ಇಲಾಖೆಗೆ ಹೈಕೋರ್ಟ್ ಸೂಚನೆ ನೀಡಿದ್ದು, ಹಿಂದಿನ ವರ್ಷದ ಅಂಕವನ್ನು ತಿರಸ್ಕರಿಸಿದವರಿಗೆ ಆಯ್ಕೆ ನೀಡಲು ತಿಳಿಸಿದೆ. ಖಾಸಗಿ ಪರೀಕ್ಷಾರ್ಥಿಗಳು ಹಿಂದಿನ ಬಾರಿಯ ಅಂಕವನ್ನೇ ಪಡೆಯಬಹುದು. ಅಥವಾ ಪರೀಕ್ಷೆ ನಡೆಸಿದಾಗ ಬರೆಯಬಹುದು ಎಂದು ನಿರ್ದೇಶನ ನೀಡುವ ಕೋರ್ಟ್, ಅಂಕ ಉತ್ತಮಪಡಿಸಿಕೊಳ್ಳ ಬಯಸಿದ ವಿದ್ಯಾರ್ಥಿಗಳಿಗೆ ಅವಕಾಶ ಒದಗಿಸಿದೆ.
ಜುಲೈ 31 ರೊಳಗೆ ದ್ವಿತೀಯ ಪಿಯು ಫಲಿತಾಂಶ ಪ್ರಕಟಿಸುವಂತೆಯೂ ಕೋರ್ಟ್ ಶಿಕ್ಷಣ ಇಲಾಖೆಗೆ ಸೂಚನೆ ನೀಡಿದೆ.
ಇದನ್ನೂ ಓದಿ:
TET-2021: ಶಿಕ್ಷಕರ ಅರ್ಹತಾ ಪರೀಕ್ಷೆಗೆ ದಿನಾಂಕ ಘೋಷಣೆ; ಅಗಸ್ಟ್ 22ರಂದು ಪರೀಕ್ಷೆ
(Karnataka 2nd PUC Exam result Guidelines released marks calculated by SSLC and 2st PU marks)
Published On - 6:40 pm, Mon, 5 July 21