ಆಶಾ ಕಾರ್ಯಕರ್ತೆಯರ ಪ್ರತಿಭಟನೆ: ಆರೋಗ್ಯ ಸಚಿವರ ಸಭೆ ವಿಫಲ, ಬೇಡಿಕೆ ಈಡೇರುವವರೆಗೂ ಹೋರಾಟ ಮುಂದುವರಿಕೆ

ಆರೋಗ್ಯ ಸಚಿವರೊಂದಿಗೆ ನಡೆದ ಆಶಾ ಕಾರ್ಯಕರ್ತೆಯರ ಸಭೆ ವಿಫಲವಾಗಿದೆ. ಕನಿಷ್ಠ 15 ಸಾವಿರ ರೂ. ನಿಗದಿತ ಗೌರವಧನ, ಬಾಕಿ ಪ್ರೋತ್ಸಾಹಧನ ಬಿಡುಗಡೆ ಮತ್ತು ಸೇವಾ ಭದ್ರತೆ ಸೇರಿದಂತೆ ಪ್ರಮುಖ ಬೇಡಿಕೆಗಳನ್ನು ಲಿಖಿತವಾಗಿ ಈಡೇರಿಸುವವರೆಗೂ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ನಡೆಯುತ್ತಿರುವ ಪ್ರತಿಭಟನೆಯನ್ನು ಹಿಂಪಡೆಯುವುದಿಲ್ಲ ಎಂದು ಆಶಾ ಕಾರ್ಯಕರ್ತೆಯರು ಪಟ್ಟು ಹಿಡಿದಿದ್ದಾರೆ.

ಆಶಾ ಕಾರ್ಯಕರ್ತೆಯರ ಪ್ರತಿಭಟನೆ: ಆರೋಗ್ಯ ಸಚಿವರ ಸಭೆ ವಿಫಲ, ಬೇಡಿಕೆ ಈಡೇರುವವರೆಗೂ ಹೋರಾಟ ಮುಂದುವರಿಕೆ
ಯುಟಿ ಖಾದರ್
Image Credit source: PTI
Edited By:

Updated on: Nov 21, 2026 | 8:00 PM

ಬೆಂಗಳೂರು, ನವೆಂಬರ್ 21: ಆಶಾ ಕಾರ್ಯಕರ್ತೆಯರ ಬೇಡಿಕೆಗಳನ್ನು ಈಡೇರಿಸುತ್ತೇವೆ ನೀವು ಪ್ರತಿಭಟನೆ ಕೈಬಿಡಿ ಎಂದು ಮನವೊಲಿಸಲು ಆರೋಗ್ಯ ಸಚಿವ ಯುಟಿ ಖಾದರ್ ನಡೆಸಿದ ಸಭೆ ವಿಫಲವಾಗಿದೆ. ಸಚಿವರ ಮನವಿಗೂ ಒಪ್ಪದ ಆಶಾ ಕಾರ್ಯಕರ್ತೆಯರು, ತಮ್ಮ ಬೇಡಿಕೆಗಳು ಈಡೇರುವವರೆಗೂ ಪ್ರತಿಭಟನೆ ಹಿಂಪಡೆಯುವುದಿಲ್ಲ ಎಂದು ಪಟ್ಟು ಹಿಡಿದಿದ್ದಾರೆ. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ನಡೆಯುತ್ತಿರುವ ಆಶಾ ಕಾರ್ಯಕರ್ತೆಯರ ಅಹೋರಾತ್ರಿ ಧರಣಿ ಮುಂದುವರೆದಿದೆ.

ಸಭೆಯ ಬಳಿಕ ಮಾತನಾಡಿದ ಆರೋಗ್ಯ ಸಚಿವ ಯು.ಟಿ. ಖಾದರ್, ಆಶಾ ಕಾರ್ಯಕರ್ತೆಯರ ಹಿತ ಕಾಯುವುದು ಸರ್ಕಾರದ ಕರ್ತವ್ಯ ಎಂದರು. ಅವರ ಸಮಸ್ಯೆಗಳನ್ನು ಮುಖ್ಯಮಂತ್ರಿಗಳ ಗಮನಕ್ಕೆ ತರುವುದಾಗಿ ತಿಳಿಸಿದರು. ಮುಖ್ಯಮಂತ್ರಿಯವರೂ ಈಗಾಗಲೇ ಆಶಾ ಕಾರ್ಯಕರ್ತೆಯರೊಂದಿಗೆ ಸಭೆ ನಡೆಸಿದ್ದು, ಸಮಸ್ಯೆ ಬಗೆಹರಿಸಲು ಸ್ವಲ್ಪ ಸಮಯ ಕೇಳಿದ್ದಾರೆ. ಮುಂಬರುವ ವಿಧಾನಸಭೆ ಅಧಿವೇಶನದಲ್ಲಿ ಸಿಹಿ ಸುದ್ದಿ ನೀಡುವಂತೆ ಕಾರ್ಯಕರ್ತೆಯರು ಕೇಳಿದ್ದರು. ಅದೇ ವಿಚಾರವನ್ನು ತಾವು ಈಗಲೂ ತಿಳಿಸಿದ್ದು, ಅಧಿವೇಶನದಲ್ಲಿ ಯಾವ ಘೋಷಣೆ ಮಾಡಬೇಕು ಎಂಬುದನ್ನು ಡಿಕೆ ಶಿವಕುಮಾರ್ ನಿರ್ಧರಿಸಲಿದ್ದಾರೆ ಎಂದು ಹೇಳಿದರು.

Loading...

ಆಶಾ ಕಾರ್ಯಕರ್ತೆಯರು ರಾಷ್ಟ್ರೀಯ ಆರೋಗ್ಯ ಅಭಿಯಾನ (NHM) ಅಡಿಯಲ್ಲಿ ಕೆಲಸ ಮಾಡುತ್ತಿದ್ದಾರೆ. 2014ರಲ್ಲಿ ಕೇಂದ್ರ ಸರ್ಕಾರ ಎಷ್ಟು ಗೌರವಧನ ಹೆಚ್ಚಿಸುತ್ತದೆಯೋ ಅಷ್ಟೇ ಮೊತ್ತವನ್ನು ರಾಜ್ಯ ಸರ್ಕಾರವೂ ಹೆಚ್ಚಿಸಬೇಕು ಎಂಬ ತೀರ್ಮಾನ ಮಾಡಲಾಗಿತ್ತು. ಅದರಂತೆ ಕೇಂದ್ರ ಸರ್ಕಾರ ಒಂದು ಸಾವಿರ ರೂಪಾಯಿ ಹೆಚ್ಚಿಸಿದಾಗ ರಾಜ್ಯ ಸರ್ಕಾರವೂ ಒಂದು ಸಾವಿರ ರೂಪಾಯಿ ಹೆಚ್ಚಿಸಿತ್ತು ಎಂದು ಖಾದರ್ ವಿವರಿಸಿದರು.

ಇಂದಿನ ಸಭೆಯ ವಿಚಾರವನ್ನು ಮುಖ್ಯಮಂತ್ರಿಯವರ ಗಮನಕ್ಕೆ ತರುವುದಾಗಿ ಹೇಳಿದ ಸಚಿವರು, ಪ್ರತಿಭಟನೆ ಕೈಬಿಟ್ಟಿದ್ದರೆ ಸಮಸ್ಯೆ ಬೇಗ ಬಗೆಹರಿಸಲು ಸಾಧ್ಯವಾಗುತ್ತಿತ್ತು. ಆದರೆ ಕಾರ್ಯಕರ್ತೆಯರು ಹೋರಾಟ ಮುಂದುವರಿಸಿದ್ದಾರೆ. ಮುಂದೇನು ಮಾಡಬೇಕು ಎಂಬುದನ್ನು ನೋಡಬೇಕಿದೆ ಎಂದು ಪ್ರತಿಕ್ರಿಯಿಸಿದರು.

ಇದನ್ನೂ ಓದಿ:

ಬೆಂಗಳೂರು: ಮೂರನೇ ದಿನಕ್ಕೆ ಕಾಲಿಟ್ಟ ಆಶಾ ಕಾರ್ಯಕರ್ತೆಯರ ಪ್ರತಿಭಟನೆ, ಇಬ್ಬರು ಅಸ್ವಸ್ಥ

 

ಆಶಾ ಕಾರ್ಯಕರ್ತೆಯರ ಪ್ರಮುಖ ಬೇಡಿಕೆಗಳೇನು?

ಆಶಾ ಕಾರ್ಯಕರ್ತೆಯರು ತಿಂಗಳಿಗೆ ಕನಿಷ್ಠ 15 ಸಾವಿರ ರೂಪಾಯಿ ನಿಗದಿತ ಗೌರವಧನ ನೀಡಬೇಕು ಎಂದು ಒತ್ತಾಯಿಸುತ್ತಿದ್ದಾರೆ. ಪ್ರೋತ್ಸಾಹಧನದ ಮೇಲಿನ ಅವಲಂಬನೆ ಕಡಿಮೆ ಮಾಡಿ ನಿಗದಿತ ಗೌರವಧನ ನೀಡಬೇಕು, ಬಾಕಿ ಇರುವ ಪ್ರೋತ್ಸಾಹಧನ ಬಿಡುಗಡೆ ಮಾಡಬೇಕು ಎಂಬುದು ಅವರ ಪ್ರಮುಖ ಬೇಡಿಕೆ.

ಇದರ ಜೊತೆಗೆ ನಿವೃತ್ತಿ ಸಂದರ್ಭದಲ್ಲಿ ಐದು ಲಕ್ಷ ರೂಪಾಯಿ ಇಡಿಗಂಟು ನೀಡಬೇಕು, ಸಮಸ್ತ ಮೊಬೈಲ್ ಆ್ಯಪ್ ಮೂಲಕ ಕೆಲಸ ಮಾಡುವುದನ್ನು ಕಡ್ಡಾಯಗೊಳಿಸಿರುವುದನ್ನು ಹಿಂಪಡೆಯಬೇಕು, ಸೇವಾ ಭದ್ರತೆ ಹಾಗೂ ಇತರ ಸೌಲಭ್ಯಗಳನ್ನು ಒದಗಿಸಬೇಕು ಎಂದು ಆಗ್ರಹಿಸಿದ್ದಾರೆ.

ಸರ್ಕಾರದ ಭರವಸೆಗೆ ಒಪ್ಪದ ಕಾರ್ಯಕರ್ತೆಯರು

ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರು ಕೂಡ ಆಶಾ ಕಾರ್ಯಕರ್ತೆಯರ ಪ್ರತಿನಿಧಿಗಳೊಂದಿಗೆ ಸಭೆ ನಡೆಸಿ, ಬೇಡಿಕೆಗಳನ್ನು ಸಚಿವ ಸಂಪುಟ ಹಾಗೂ ವಿಧಾನಸಭೆ ಅಧಿವೇಶನದಲ್ಲಿ ಚರ್ಚಿಸುವುದಾಗಿ ಭರವಸೆ ನೀಡಿದ್ದರು. ಪ್ರತಿಭಟನೆ ಕೈಬಿಡುವಂತೆ ಮನವಿ ಮಾಡಿದ್ದರು. ಆದರೆ ಕೇವಲ ಮೌಖಿಕ ಭರವಸೆಗೆ ಒಪ್ಪದ ಕಾರ್ಯಕರ್ತೆಯರು, ತಮ್ಮ ಬೇಡಿಕೆಗಳ ಕುರಿತು ಸರ್ಕಾರ ಲಿಖಿತ ಆದೇಶ ಹೊರಡಿಸುವವರೆಗೂ ಹೋರಾಟ ಮುಂದುವರಿಸುವುದಾಗಿ ಸ್ಪಷ್ಟಪಡಿಸಿದ್ದಾರೆ.

ರಾಜ್ಯದ ವಿವಿಧ ಜಿಲ್ಲೆಗಳಿಂದ ಸಾವಿರಾರು ಆಶಾ ಕಾರ್ಯಕರ್ತೆಯರು ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ. ಇದೀಗ ಆರೋಗ್ಯ ಸಚಿವರ ಸಭೆಯೂ ಯಾವುದೇ ಅಂತಿಮ ನಿರ್ಧಾರಕ್ಕೆ ಬಾರದ ಹಿನ್ನೆಲೆಯಲ್ಲಿ ಸರ್ಕಾರ ಮತ್ತು ಆಶಾ ಕಾರ್ಯಕರ್ತೆಯರ ನಡುವಿನ ಮಾತುಕತೆ ಯಾವ ಹಂತಕ್ಕೆ ತಲುಪಲಿದೆ ಎಂಬ ಕುತೂಹಲ ಮೂಡಿದೆ.

 

ರಾಜ್ಯದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

 

ವಿನಯ್​ ಕಾಶಪ್ಪನವರ್​

ವಿನಯಕುಮಾರ್ ಕಾಶಪ್ಪನವರ್ ಅವರು ಸಮೂಹ ಸಂವಹನ ಹಾಗೂ ತಂತ್ರಜ್ಞಾನದಲ್ಲಿ ಸ್ನಾತಕೋತ್ತರ ಪದವಿ ಮತ್ತು ಪತ್ರಿಕೋದ್ಯಮದಲ್ಲಿ ವಿದ್ಯಾಭ್ಯಾಸ ಪಡೆದಿದ್ದಾರೆ. ಕಳೆದ 8 ವರ್ಷಗಳಿಂದ ಟಿವಿ9 ಕನ್ನಡದಲ್ಲಿ ಹಿರಿಯ ವರದಿಗಾರನಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಬೆಂಗಳೂರು ನಗರ, ಶಿಕ್ಷಣ ಹಾಗೂ ಆರೋಗ್ಯ ಕ್ಷೇತ್ರಗಳಲ್ಲಿ 10 ವರ್ಷಗಳ ವರದಿಗಾರಿಕೆ ಅನುಭವ ಹೊಂದಿದ್ದು, ಸಮಾಜಮುಖಿ ಹಾಗೂ ತನಿಖಾ ವರದಿಗಳ ಮೂಲಕ ಜನಪರ ವಿಷಯಗಳನ್ನು ಬೆಳಕಿಗೆ ತರುತ್ತಿದ್ದಾರೆ.

Read More
Loading...
Unable to load recommendations.
Follow Us