
ಬೆಂಗಳೂರು, ಫೆಬ್ರವರಿ 5: ಪರಿಸರದ ಮೇಲೆ ಪ್ಲಾಸ್ಟಿಕ್ ಬಳಕೆಯಿಂದ ಆಗುವ ಗಂಭೀರ ಹಾನಿಯನ್ನು ಗಮನದಲ್ಲಿಟ್ಟುಕೊಂಡು ಕರ್ನಾಟಕ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ. ಸರ್ಕಾರಿ ಕಚೇರಿಗಳಲ್ಲಿ ಮತ್ತು ಸರ್ಕಾರಿ ಕಾರ್ಯಕ್ರಮಗಳಲ್ಲಿ ಏಕ ಬಳಕೆಯ ಪ್ಲಾಸ್ಟಿಕ್ ಬಾಟಲ್ಗಳಲ್ಲಿ ಕುಡಿಯುವ ನೀರು ಕೊಡುವಂತಿಲ್ಲ ಎಂಬ ಆದೇಶವನ್ನು ಕಟ್ಟುನಿಟ್ಟಿನಿಂದ ಜಾರಿಗೊಳಿಸಬೇಕು ಎಂದು ಸರ್ಕಾರ ಸುತ್ತೋಲೆ ಹೊರಡಿಸಿದೆ. ಜನವರಿ 31ರಂದೇ ಈ ಸುತ್ತೋಲೆ ಹೊರಡಿಸಲಾಗಿದ್ದು, ಪರ್ಯಾಯ ವ್ಯವಸ್ಥೆ ಬಗ್ಗೆಯೂ ಸಲಹೆ ನೀಡಲಾಗಿದೆ.
ಪ್ಲಾಸ್ಟಿಕ್ ವಸ್ತುಗಳ ಅತಿಯಾದ ಬಳಕೆಯಿಂದ ಆರೋಗ್ಯ ಮತ್ತು ಪರಿಸರದ ಮೇಲೆ ಉಂಟಾಗುತ್ತಿರುವ ದುಷ್ಪರಿಣಾಮಗಳನ್ನು ತಡೆಯುವ ದೃಷ್ಟಿಯಿಂದ ಸಚಿವಾಲಯ ಸೇರಿದಂತೆ ರಾಜ್ಯಾದ್ಯಾಂತ ಎಲ್ಲಾ ಸರ್ಕಾರಿ ಕಚೇರಿಗಳಲ್ಲಿ ಹಾಗೂ ಸರ್ಕಾರಿ ಸೌಮ್ಯದ ಮಂಡಳಿ, ನಿಗಮ, ವಿಶ್ವವಿದ್ಯಾನಿಲಯಗಳು ಹಾಗೂ ಸರ್ಕಾರದಿಂದ ಅನುದಾನ ಪಡೆಯುವಂತಹ ಯಾವುದೇ ಸಂಸ್ಥೆಗಳ ವತಿಯಿಂದ ಏರ್ಪಡಿಸಲ್ಪಡುವ ಸಭೆ ಸಮಾರಂಭಗಳಲ್ಲಿ ಏಕಕಾಲಿಕ ಬಳಕೆಯ ಪ್ಲಾಸ್ಟಿಕ್ ಬಾಟಲ್ನ ನೀರಿನ ಬಳಕೆ/ ಸರಬರಾಜು ಮಾಡುವುದನ್ನು ನಿಷೇಧಿಸಲಾಗಿದೆ. ಇಂತಹ ಸಭೆ ಸಮಾರಂಭಗಳಲ್ಲಿ ಕುಡಿಯುವ ನೀರನ್ನು ಸಂದರ್ಭಾನುಸಾರ ಶುಚಿತ್ವ ಉಳ್ಳ ಗ್ಲಾಸ್, ಸ್ಟೀಲ್, ಪೇಪರ್ ಮತ್ತಿತರ ಪ್ಲಾಸ್ಟಿಕ್ ಅಲ್ಲದ ಲೋಟಗಳಲ್ಲಿ ಸರಬರಾಜು ಮಾಡಲು ಕ್ರಮವಹಿಸುವಂತೆ ಅಧಿಸೂಚನೆ / ಆದೇಶ / ಸುತ್ತೋಲೆ ಹೊರಡಿಸಲಾಗಿದೆ ಎಂದು ಸರ್ಕಾರಿ ಸುತ್ತೋಲೆಯಲ್ಲಿ ತಿಳಿಸಲಾಗಿದೆ.
ಏಕ ಬಳಕೆಯ ಬಳಕೆಯ ಪ್ಲಾಸ್ಟಿಕ್ ಬಾಟಲ್ ನೀರಿನ ಬಳಕೆ ಹಾಗೂ ಸರಬರಾಜು ಮಾಡುವುದನ್ನು ನಿಷೇಧಿಸಿ 2024ರ ನವೆಂಬರ್ನಲ್ಲಿಯೂ ಸುತ್ತೋಲೆ ಹೊರಡಿಸಲಾಗಿತ್ತು. ಏಕ ಬಳಕೆಯ ಪ್ಲಾಸ್ಟಿಕ್ ಬಾಟಲ್ ಬದಲಿಗೆ ಸೂಕ್ತ ಸಾಮೂಹಿಕ ಕುಡಿಯುವ ನೀರು ವಿತರಣಾ ಏರ್ಪಡಿಸುವಂತೆ ಸೂಚಿಸಿ ಆದೇಶ ಹಾಗೂ ಸುತ್ತೋಲೆಗಳನ್ನು ಹೊರಡಿಸಲಾಗಿತ್ತು. ಆದಗ್ಯೂ ಸಹ ಸಚಿವಾಲಯವೂ ಸೇರಿದಂತೆ ಯಾವುದೇ ಸರ್ಕಾರಿ ಕಚೇರಿಗಳಲ್ಲಿ ಈ ನಿಯಮವನ್ನು ಪಾಲಿಸದಿರುವುದನ್ನು ಸರ್ಕಾರವು ಗಂಭೀರವಾಗಿ ಪರಿಗಣಿಸಿದೆ. ಹೀಗಾಗಿ, ಇನ್ನು ಮುಂದೆ ಮೇಲಿನ ಸೂಚನೆಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಹಾಗೂ ಪ್ಲಾಸ್ಟಿಕ್ ಬಳಕೆಯ ಬದಲಾಗಿ ಪರಿಸರ ಸ್ನೇಹಿ ವಸ್ತುಗಳಿಂದ ತಯಾರಿಸಿದ ಪರಿಕರಗಳನ್ನು ಬಳಕೆ ಮಾಡುವಂತೆ ಮತ್ತೊಮ್ಮೆ ಸೂಚನೆ ನೀಡಲಾಗುತ್ತಿದೆ ಎಂದು ಸರ್ಕಾರದ ಉಪ ಕಾರ್ಯದರ್ಶಿಗಳು ಸುತ್ತೋಲೆಯಲ್ಲಿ ಉಲ್ಲೇಖಿಸಿದ್ದಾರೆ.
ಇದನ್ನೂ ಓದಿ: ಪ್ಲಾಸ್ಟಿಕ್ ಪ್ಯಾಕೆಟ್ನಲ್ಲಿರುವ ಆಹಾರ ಸೇವಿಸುತ್ತಿದ್ದೀರಾ? ಈ ಕ್ಯಾನ್ಸರ್ ಬರುವುದು ಖಚಿತ
ಎಲ್ಲ ಇಲಾಖೆಗಳ ಮುಖ್ಯಸ್ಥರು ತಮ್ಮ ಅಧೀನದಲ್ಲಿ ಬರುವ ಎಲ್ಲಾ ಕ್ಷೇತ್ರ, ಇಲಾಖೆ, ಮಂಡಳಿ, ನಿಗಮಗಳಿಗೆ ಆದೇಶವನ್ನು ಕಟ್ಟುನಿಟ್ಟಾಗಿ ಪಾಲಿಸಲು ಸೂಚನೆ ನೀಡಬೇಕು ಎಂದೂ ಸುತ್ತೋಲೆಯಲ್ಲಿ ನಿರ್ದೇಶನ ನೀಡಲಾಗಿದೆ.
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 12:57 pm, Wed, 5 February 25