ಯತ್ನಾಳ್ ಉಚ್ಛಾಟನೆ ಬೆನ್ನಲ್ಲೇ ಮಹತ್ವದ ಸಂದೇಶ ರವಾನಿಸಿದ ವಿಜಯೇಂದ್ರ..!
ಪಕ್ಷದ ಶಿಸ್ತು ಉಲ್ಲಂಘನೆ ಹಾಗೂ ರಾಜ್ಯ ನಾಯಕರ ವಿರುದ್ಧ ಬಹಿರಂಗವಾಗಿ ಹೇಳಿಕೆ ನೀಡಿದ್ದ ಶಾಸಕರಾದ ಎಸ್.ಟಿ.ಸೋಮಶೇಖರ್, ಶಿವರಾಮ್ ಹೆಬ್ಬಾರ್ ಸೇರಿ ಐವರು ನಾಯಕರಿಗೆ ಬಿಜೆಪಿಯ ಕೇಂದ್ರ ಶಿಸ್ತು ಸಮಿತಿ ನೋಟಿಸ್ ನೀಡಿದ್ದ ಬೆನ್ನಲ್ಲೇ ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರಿಗೆ ಹೈಕಮಾಂಡ್ ಶಾಕ್ ನೀಡಿದೆ. ಈ ಹಿಂದೆ ಶಿಸ್ತು ಸಮಿತಿ ನೀಡಿದ್ದ ಶೋಕಾಸ್ ನೋಟಿಸ್‌ಗೆ ಯಾವುದೇ ಉತ್ತರ ನೀಡದ ಕಾರಣ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರನ್ನು 6 ವರ್ಷಗಳ ಕಾಲ ಬಿಜೆಪಿಯಿಂದ ಉಚ್ಚಾಟನೆ ಮಾಡಲಾಗಿದೆ. ಯತ್ನಾಳ್ ಉಚ್ಛಾಟನೆ ಆದೇಶ ಹೊರಬೀಳುತ್ತಿದ್ದಂತೆಯೇ ಇತ್ತ ವಿಜಯೇಂದ್ರ ಮಹತ್ವದ ಸಂದೇಶ ನೀಡಿದ್ದಾರೆ.

ಬೆಂಗಳೂರು, (ಮಾರ್ಚ್ 26): ಬಿಜೆಪಿಯ ಕೇಂದ್ರ ಶಿಸ್ತು ಸಮಿತಿ ನೀಡಿದ್ದ ಶೋಕಾಸ್ ನೋಟಿಸ್‌ಗೆ ಯಾವುದೇ ಉತ್ತರ ನೀಡದ ಕಾರಣ ಬಿಜೆಪಿ ಹೈಕಮಾಂಡ್ ಯತ್ನಾಳ್ (Basanagouda Patil Yatnal) ಅವರನ್ನು ಉಚ್ಚಾಟನೆ ಮಾಡಿದೆ. ತಕ್ಷಣದಿಂದ ಜಾರಿಗೆ ಬರುವಂತೆ 6 ವರ್ಷಗಳ ಕಾಲ ಯತ್ನಾಳ್ ಅವರನ್ನು ಉಚ್ಚಾಟನೆ ಮಾಡಲಾಗಿದೆ. ಇನ್ನು ಈ ಬಗ್ಗೆ ಬಿಜೆಪಿ ರಾಜ್ಯಾಧ್ಯಕ್ಷ ಪ್ರತಿಕ್ರಿಯಿಸಿದ್ದು, ಭಾರತೀಯ ಜನತಾ ಪಾರ್ಟಿ, ಲಕ್ಷಾಂತರ ಕಾರ್ಯಕರ್ತರನ್ನು ಹೊಂದುವ ಮೂಲಕ ವಿಶ್ವದಲ್ಲಿ ಅಗ್ರಮಾನ್ಯತೆ ಪಡೆದಿರುವ ರಾಜಕೀಯ ಪಕ್ಷ, ಸಂಘ ಸಂಸ್ಕಾರ ಪಡೆದಿರುವ ಸಮರ್ಪಣಾ ಮನೋಭಾವದ ಕಾರ್ಯಕರ್ತರ ಬೆವರ ಪರಿಶ್ರಮದಿಂದ ಸಮೃದ್ಧ ವೃಕ್ಷದಂತೆ ಬೆಳೆದಿರುವ ಪಕ್ಷದಲ್ಲಿ ಶಿಸ್ತು-ತ್ಯಾಗಕ್ಕೆ ಮೊದಲ ಆದ್ಯತೆ ಎಂದು ಪರೋಕ್ಷವಾಗಿ ವಿರೋಧಿಗಳಿಗೆ ಸಂದೇಶ ನೀಡಿದ್ದಾರೆ.
ಯತ್ನಾಳ್ ಅವರ ಉಚ್ಛಾಟನೆ ಆದೇಶ ಹೊರಬೀಳುತ್ತಿದ್ದಂತೆಯೇ ಟ್ವೀಟ್ ಮಾಡಿರುವ ವಿಜಯೇಂದ್ರ, ಭಾರತೀಯ ಜನತಾ ಪಾರ್ಟಿ, ಲಕ್ಷಾಂತರ ಕಾರ್ಯಕರ್ತರನ್ನು ಹೊಂದುವ ಮೂಲಕ ವಿಶ್ವದಲ್ಲಿ ಅಗ್ರಮಾನ್ಯತೆ ಪಡೆದಿರುವ ರಾಜಕೀಯ ಪಕ್ಷ, ಸಂಘ ಸಂಸ್ಕಾರ ಪಡೆದಿರುವ ಸಮರ್ಪಣಾ ಮನೋಭಾವದ ಕಾರ್ಯಕರ್ತರ ಬೆವರ ಪರಿಶ್ರಮದಿಂದ ಸಮೃದ್ಧ ವೃಕ್ಷದಂತೆ ಬೆಳೆದಿರುವ ಪಕ್ಷದಲ್ಲಿ ಶಿಸ್ತು-ತ್ಯಾಗಕ್ಕೆ ಮೊದಲ ಆದ್ಯತೆ. ಪಕ್ಷದ ಹಿರಿಯರು ಹಾಗೂ ವರಿಷ್ಠರು ಈ ವಿಷಯದಲ್ಲಿ ಎಂದಿಗೂ ರಾಜಿ ಮಾಡಿಕೊಂಡಿರುವ ಉದಾಹರಣೆ ನಮ್ಮ ಮುಂದಿಲ್ಲ, ಸದ್ಯ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧದ ಶಿಸ್ತುಕ್ರಮ ವರಿಷ್ಠರು ಸುದೀರ್ಘ ಅವಧಿಯಿಂದ ಸ್ಥಿತಿ-ಗತಿಗಳನ್ನು ಅವಲೋಕಿಸಿ ಅನಿವಾರ್ಯವಾಗಿ ತೆಗೆದುಕೊಂಡಿರುವ ಕ್ರಮವಾಗಿರುತ್ತದೆ ಎಂದು ಬರೆದುಕೊಂಡಿದ್ದಾರೆ.
ಇದನ್ನೂ ಓದಿ: Yatnal Expelled: ಬಿಜೆಪಿಯಿಂದ ಬಸನಗೌಡ ಪಾಟೀಲ್ ಯತ್ನಾಳ್ ಉಚ್ಛಾಟನೆ
ಪಕ್ಷದ ಬೆಳವಣಿಗೆಯಲ್ಲಿನ ಕಹಿ ಘಟನೆಗಳನ್ನು ಉಲ್ಲೇಖಿಸಿ ಪಕ್ಷದ ವರಿಷ್ಠರಿಗೆ ನಾನು ಎಂದೂ ದೂರುಗಳನ್ನು ಹೇಳಿಕೊಂಡಿಲ್ಲ, ದಾಖಲಿಸಿಯೂ ಇಲ್ಲ. ಪೂಜ್ಯ ತಂದೆ ಯಡಿಯೂರಪ್ಪನವರು ಎಲ್ಲರನ್ನೂ ಸಮಚಿತ್ತ ಭಾವದಿಂದ ನೋಡಿ, ಪಕ್ಷವನ್ನು ಕುಟುಂಬದಂತೆ ಬೆಳೆಸಿದ ಮಾದರಿಯಲ್ಲಿಯೇ ನಡೆಯಬೇಕೆಂಬ ಸಂಕಲ್ಪ ಹೊತ್ತು, ಸಂಘದ ಹಿರಿಯರು ಮತ್ತು ಪಕ್ಷದ ಹಿರಿಯರ ಮಾರ್ಗದರ್ಶನದಲ್ಲಿ ಮುನ್ನಡೆಯುತ್ತಿದ್ದೇನೆ ಎಂದಿದ್ದಾರೆ.
ಭಾರತೀಯ ಜನತಾ ಪಾರ್ಟಿ, ಲಕ್ಷಾಂತರ ಕಾರ್ಯಕರ್ತರನ್ನು ಹೊಂದುವ ಮೂಲಕ ವಿಶ್ವದಲ್ಲಿ ಅಗ್ರಮಾನ್ಯತೆ ಪಡೆದಿರುವ ರಾಜಕೀಯ ಪಕ್ಷ, ಸಂಘ ಸಂಸ್ಕಾರ ಪಡೆದಿರುವ ಸಮರ್ಪಣಾ ಮನೋಭಾವದ ಕಾರ್ಯಕರ್ತರ ಬೆವರ ಪರಿಶ್ರಮದಿಂದ ಸಮೃದ್ಧ ವೃಕ್ಷದಂತೆ ಬೆಳೆದಿರುವ ಪಕ್ಷದಲ್ಲಿ ಶಿಸ್ತು-ತ್ಯಾಗಕ್ಕೆ ಮೊದಲ ಆದ್ಯತೆ.
ಪಕ್ಷದ ಹಿರಿಯರು ಹಾಗೂ ವರಿಷ್ಠರು ಈ ವಿಷಯದಲ್ಲಿ…
— Vijayendra Yediyurappa (@BYVijayendra) March 26, 2025
ಕೆಲ ದಿನಗಳ ಹಿಂದೆ ನಡೆದ ಕಹಿ ಪ್ರಸಂಗಗಳಿಂದ ಎಂದಿಗೂ ನಾನು ಉದ್ವೇಗಗೊಳ್ಳಲಿಲ್ಲ, ಯಾರೊಂದಿಗೂ ದುಃಖ ತೋಡಿಕೊಂಡಿಲ್ಲ, ಸಮರ್ಪಣೆ-ತ್ಯಾಗದ ಪಾಠವನ್ನು ಹೇಳಿಕೊಡುವ ಸಂಸ್ಕಾರವಂತ ಸಂಘಟನೆಯ ವ್ಯವಸ್ಥೆಯಲ್ಲಿ ಬೆಳೆದು ಬಂದ ನಾನು ಸಹನೆ-ತಾಳ್ಮೆಯನ್ನು ಜವಾಬ್ದಾರಿ ನಿರ್ವಹಿಸುವ ನಿಟ್ಟಿನಲ್ಲಿ ಆಧಾರ ಸ್ಥಂಭವೆಂದು ಪರಿಗಣಿಸಿ ಮುನ್ನಡಿದಿದ್ದೇನೆ. ಈ ನಿಟ್ಟಿನಲ್ಲಿ ವರಿಷ್ಠರು ತೆಗೆದುಕೊಂಡಿರುವ ಶಿಸ್ತು ಕ್ರಮವನ್ನು ನಾನು ಸಂಭ್ರಮಿಸಲಾರೆ ಬದಲಾಗಿ ಈ ಬೆಳವಣಿಗೆಯನ್ನು ದುರದೃಷ್ಟಕರವೆಂದು ದುಃಖಿಸುತ್ತೇನೆ. ವಿಶ್ವಾಸ ರಾಜಕಾರಣವನ್ನು ಎಲ್ಲರೊಡಗೂಡಿ ಮುಂದುವರೆಸಿ ಪಕ್ಷ ಸಂಘಟನೆಗೆ ಕಟ್ಟಕಡೆಯ ಕಾರ್ಯಕರ್ತರನ್ನೂ ಅಣಿಗೊಳಿಸುವ ನಿಟ್ಟಿನಲ್ಲಿ ಮುನ್ನಡೆಯಲಿದ್ದೇನೆ. ಭವಿಷ್ಯದಲ್ಲಿಯೂ ನಾನು ನಡೆಯುವ ಹಾದಿಯಲ್ಲಿ ಎಲ್ಲಾದರೂ ಎಡವಿದರೆ, ಅದನ್ನು ತಿದ್ದಿ ತೀಡುವ ಅಧಿಕಾರ ಪಕ್ಷದ ಹಿರಿಯರೆಲ್ಲರಿಗೂ ಇದ್ದೇ ಇದೆ.
ಎಲ್ಲರೂ ಸೇರಿ ರಚನಾತ್ಮಕ ಸಲಹೆಗಳನ್ನು ಸ್ವೀಕರಿಸಿ ಪಕ್ಷವನ್ನು ಮುನ್ನಡೆಸೋಣ, ಭ್ರಷ್ಟಾಚಾರ ಹಾಗೂ ಸ್ವಜನ ಪಕ್ಷಪಾತದಲ್ಲಿ ಮುಳುಗಿರುವ ಜನವಿರೋಧಿ ಕಾಂಗ್ರೆಸ್ ಸರ್ಕಾರವನ್ನು ಅಧಿಕಾರದಿಂದ ಕೆಳಗಿಳಿಸಿ, ಸಮೃದ್ಧ ಕರ್ನಾಟಕವನ್ನು ಕಟ್ಟುವ ನಿಟ್ಟಿನಲ್ಲಿ ವಿಕಸಿತ ಭಾರತದ ಸಂಕಲ್ಪ ಹೊತ್ತ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಹೆಗಲು ಕೊಡೋಣ, ಪಕ್ಷದ ವರಿಷ್ಟರ ನಿರೀಕ್ಷೆಯ ಗುರಿ ತಲುಪೋಣ ಎಂದು ಹೇಳಿದ್ದಾರೆ.
Published On - 6:11 pm, Wed, 26 March 25