ಅಂಗನವಾಡಿ ಕಾರ್ಯಕರ್ತೆಯರಿಗೆ ಸ್ಮಾರ್ಟ್ ಫೋನ್, ಗ್ರ್ಯಾಚುಯಿಟಿ: ಬಜೆಟ್ನಲ್ಲಿ ಸಿಎಂ ಘೋಷಣೆ
Karnataka Budget 2024: ಅಂಗನವಾಡಿ ಕಾರ್ಯಕರ್ತೆಯರಿಗೆ ಸಿಎಂ ಸಿದ್ದರಾಮಯ್ಯ ಅವರು ಬಜೆಟ್ನಲ್ಲಿ ಹಲವು ಕ್ರಮಗಳನ್ನು ಘೋಷಿಸಿದ್ದಾರೆ. ಅವುಗಳಲ್ಲಿ ಮುಖ್ಯವಾಗಿರುವುದು ಅಂಗನವಾಡಿ ಕಾರ್ಯಕರ್ತೆಯರಿಗೆ ಸ್ಮಾರ್ಟ್ ಫೋನ್ ನೀಡುವುದು ಮತ್ತು ಗ್ರ್ಯಾಚುಯಿಟಿ ಸೌಲಭ್ಯ ಒದಗಿಸುವುದು. ಇಷ್ಟೇ ಅಲ್ಲದೆ ಇನ್ನೂ ಹಲವು ಕ್ರಮಗಳನ್ನು ಸಿದ್ದರಾಮಯ್ಯ ಪ್ರಕಟಿಸಿದ್ದಾರೆ. ವಿವರ ಇಲ್ಲಿದೆ.
ಬೆಂಗಳೂರು, ಫೆಬ್ರವರಿ 16: ರಾಜ್ಯದ ಅಂಗನವಾಡಿ ಕಾರ್ಯಕರ್ತೆಯರಿಗೆ (Anganwadi workers) 90 ಕೋಟಿ ರೂ. ವೆಚ್ಚದಲ್ಲಿ 75,938 ಸ್ಮಾರ್ಟ್ ಫೋನ್ ವಿತರಣೆ ಮಾಡಲಾಗುವುದು ಎಂದು ಸಿಎಂ ಸಿದ್ದರಾಮಯ್ಯ (Siddaramaiah) ಘೋಷಣೆ ಮಾಡಿದರು. 2024-25ನೇ ಸಾಲಿನ ರಾಜ್ಯ ಬಜೆಟ್ (Karnataka Budget) ಮಂಡನೆ ಮಾಡಿದ ಅವರು, 100 ಕೋಟಿ ವೆಚ್ಚದಲ್ಲಿ 1,000 ಅಂಗನವಾಡಿ ಕಟ್ಟಡ ನಿರ್ಮಾಣ ಮಾಡಲಾಗುವುದು. ಅಂಗನವಾಡಿ ಕಾರ್ಯಕರ್ತೆಯರಿಗೆ ಗ್ರ್ಯಾಚುಟಿ ಸೌಲಭ್ಯಕ್ಕೆ ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು.
ಮಕ್ಕಳ ಪ್ರಾರಂಭಿಕ ಶಿಕ್ಷಣ ಮತ್ತು ಆರೈಕೆಯಲ್ಲಿ ಸಾಮರ್ಥ್ಯ ಅಭಿವೃದ್ಧಿಗೆ 20,000 ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರ ತರಬೇತಿ ಕಾರ್ಯಾಗಾರಗಳನ್ನು ಆಯೋಜಿಸಲು 10 ಕೋಟಿ ರೂ. ಗಳನ್ನು ಒದಗಿಸಲಾಗುವುದು. ರಾಜ್ಯದಲ್ಲಿ ಬಾಡಿಗೆ ಕಟ್ಟಡಗಳಲ್ಲಿ ಕಾರ್ಯನಿರ್ವಹಿಸುತ್ತಿರುವ 1,000 ಅಂಗನವಾಡಿಗಳಿಗೆ ಸ್ವಂತ ಕಟ್ಟಡಗಳನ್ನು 200 ಕೋಟಿ ರೂ.ಗಳ ವೆಚ್ಚದಲ್ಲಿ ನಿರ್ಮಿಸಲಾಗುವುದು ಎಂದು ಸಿಎಂ ಘೋಷಣೆ ಮಾಡಿದರು.
2024-25ನೇ ಸಾಲಿನಲ್ಲಿ ಮಹಿಳಾ ಉದ್ದೇಶಿತ ಯೋಜನೆಗಳಿಗೆ 86,423 ಕೋಟಿ ರೂ.ಗಳನ್ನು ಒದಗಿಸಲಾಗುವುದು. ಮಕ್ಕಳ ಉದ್ದೇಶಿತ ಯೋಜನೆಗಳಿಗೆ 2024-25ನೇ ಸಾಲಿನಲ್ಲಿ 54,617 ಕೋಟಿ ರೂ.ಗಳನ್ನು ಒದಗಿಸಲಾಗುವುದು ಎಂದು ಅವರು ತಿಳಿಸಿದರು.
ಲಿಂಗತ್ವ ಅಲ್ಪಸಂಖ್ಯಾತರ ಮಾಸಾಶನ ಹೆಚ್ಚಳ
ಲಿಂಗತ್ವ ಅಲ್ಪಸಂಖ್ಯಾತರ ಮಾಸಾಶನ ಹೆಚ್ಚಳ ನಿರ್ಧಾರವನ್ನೂ ಸಿಎಂ ಸಿದ್ದರಾಮಯ್ಯ ಪ್ರಕಟಿಸಿದ್ದಾರೆ. ಲಿಂಗತ್ವ ಅಲ್ಪಸಂಖ್ಯಾತರ ಮಾಸಾಶನವನ್ನು 800 ರೂ.ನಿಂದ 1000 ರೂ.ಗೆ ಹೆಚ್ಚಳಕ್ಕೆ ನಿರ್ಧಾರ ಕೈಗೊಳ್ಳಲಾಗಿದೆ. ಮಾಜಿ ದೇವದಾಸಿಯರ ಕಲ್ಯಾಣಕ್ಕಾಗಿ 2000 ರೂಪಾಯಿ ಮಾಸಾಶನ ನೀಡಲಾಗುವುದು ಎಂದು ಅವರು ಘೋಷಣೆ ಮಾಡಿದರು.
ಮಹಿಳೆಯರ ಆರ್ಥಿಕ ಸ್ವಾತಂತ್ರ್ಯಕ್ಕೆ ಬೆಂಬಲ ನೀಡುವ ಮಹತ್ವಾಕಾಂಕ್ಷಿ ಗೃಹಲಕ್ಷ್ಮಿ ಯೋಜನೆಯಡಿ ಕುಟುಂಬದ ಯಜಮಾನಿ ಮಹಿಳೆಗೆ ಪ್ರತಿ ತಿಂಗಳು 2,000 ರೂ. ನೀಡಲಾಗುತ್ತಿದೆ. ಕುಟುಂಬ ದತ್ತಾಂಶದನ್ವಯ 1.33 ಕೋಟಿ APL, BPL, AAY ಪಡಿತರ ಚೀಟಿ ಹೊಂದಿರುವ ಯಜಮಾನಿ ಮಹಿಳೆಯರನ್ನು ಅರ್ಹ ಫಲಾನುಭವಿಗಳೆಂದು ಗುರುತಿಸಲಾಗಿದೆ. ಜನವರಿ ಅಂತ್ಯದವರೆಗೆ 1.17 ಕೋಟಿ ಮಹಿಳೆಯರು ಯೋಜನೆಯಡಿ ನೋಂದಾಯಿಸಿಕೊಂಡಿದ್ದು, ಈವರೆಗೆ 11,726 ಕೋಟಿ ರೂ.ಗಳನ್ನು ನೇರವಾಗಿ ಫಲಾನುಭವಿಗಳ ಖಾತೆಗೆ ವರ್ಗಾಯಿಸಲಾಗಿದೆ ಎಂದು ಸಿದ್ದರಾಮಯ್ಯ ತಿಳಿಸಿದರು.
ಇದನ್ನೂ ಓದಿ: ಕರ್ನಾಟಕ ಬಜೆಟ್ನಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿಗೆ ಮೀಸಲಿಟ್ಟಿದ್ದೇನು, ಇಲ್ಲಿದೆ ಮಾಹಿತಿ
2024-25ನೇ ಸಾಲಿನಲ್ಲಿ ಗೃಹಲಕ್ಷ್ಮಿ ಯೋಜನೆಗೆ 28,608 ಕೋಟಿ ರೂ. ಒದಗಿಸಲಾಗಿದೆ. ಇದರಿಂದ ಕುಟುಂಬ ನಿರ್ವಹಣೆಯ ಜೊತೆಗೆ ಆದಾಯೋತ್ಪನ್ನ ಚಟುವಟಿಕೆಗಳಲ್ಲಿ ತಮ್ಮನ್ನು ತೊಡಗಿಸಿಕೊಳ್ಳಲು ಮಹಿಳೆಯರಿಗೆ ಅವಕಾಶ ದೊರೆಯಲಿದೆ ಎಂದು ಸಿದ್ದರಾಮಯ್ಯ ಹೇಳಿದರು.
ರಾಜ್ಯದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ