Karnataka Budget 2024: ಮದ್ಯದ ಬೆಲೆ ಏರಿಸಲು ರಾಜ್ಯ ಸರ್ಕಾರ ನಿರ್ಧಾರ
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಧಾನಸಭೆಯಲ್ಲಿ 2024-25ನೇ ಸಾಲಿನ ಬಜೆಟ್ ಮಂಡನೆ ಮಾಡುತ್ತಿದ್ದು, ಮದ್ಯ ಪ್ರಿಯರಿಗೆ ಶಾಕ್ ನೀಡಿದ್ದಾರೆ. ಹೌದು ಮದ್ಯದ ದರ ಮತ್ತೆ ಹೆಚ್ಚಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ.
ಬೆಂಗಳೂರು, ಫೆಬ್ರವರಿ 16: ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರು ವಿಧಾನಸಭೆಯಲ್ಲಿ 2024-25ನೇ ಸಾಲಿನ ಬಜೆಟ್ (Karnataka Budget 2024) ಮಂಡನೆ ಮಾಡುತ್ತಿದ್ದು, ಮದ್ಯ ಪ್ರಿಯರಿಗೆ ಶಾಕ್ ನೀಡಿದ್ದಾರೆ. ಹೌದು ಮದ್ಯದ (Alcohol) ದರ ಮತ್ತೆ ಹೆಚ್ಚಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಮದ್ಯದ ಘೋಷಿತ ಸ್ಲಾಬ್‌ಗಳನ್ನು ತರ್ಕಬದ್ಧಗೊಳಿಸುವ ಮೂಲಕ ನೆರೆ ರಾಜ್ಯಗಳ ಮದ್ಯದ ಬೆಲೆಗಳಿಗೆ ಅನುಗುಣವಾಗಿ IML, ಬಿಯರ್ ಸ್ಲಾಬ್ ಪರಿಷ್ಕರಣೆ ಮಾಡಲಾಗುವುದು ಎಂದು ಹೇಳಿದರು. ಇನ್ನು ಅಭಕಾರಿ ಇಲಾಖೆಯ ಎಲ್ಲ ಸೇವೆಗಳನ್ನು ಡಿಜಿಟಲೀಕರಣಗೊಳಿಸಲಾಗುತ್ತದೆ. ಇಲಾಖೆಯು ಒದಗಿಸುವ ವಿವಿಧ ಸೇವೆಗಳಿಗೆ ಸಮಯದ ಮಿತಿಯನ್ನು ನಿಗದಿಪಡಿಸಲಾಗುತ್ತದೆ ಹಾಗೂ ಸ್ವಯಂಚಾಲಿತ ಅನುಮೋದನೆಗೂ ಅವಕಾಶ ಕಲ್ಪಿಸಲಾಗಿದೆ.
2023-24ನೇ ಸಾಲಿನ ಜನವರಿ ತಿಂಗಳ ಅಂತ್ಯದವರೆಗೆ, ಅಬಕಾರಿ ತೆರಿಗೆಯಿಂದ 28,181 ಕೋಟಿ ರೂ.ಗಳು ಸ್ವೀಕೃತವಾಗಿದೆ. 2024-25ನೇ ಸಾಲಿಗೆ 38,525 ಕೋಟಿ ರೂ.ಗಳ ರಾಜಸ್ವ ಸಂಗ್ರಹಣೆ ಗುರಿಯನ್ನು ನಿಗದಿಪಡಿಸಲಾಗಿದೆ ಎಂದು ತಿಳಿಸಿದರು.
ಬಿಯರ್ ಪ್ರಿಯರಿಗೆ ದರ ಏರಿಕೆ
ಕರ್ನಾಟಕ ಸರ್ಕಾರವು ಬಿಯರ್ ಮೇಲಿನ ಹೆಚ್ಚುವರಿ ಅಬಕಾರಿ ಸುಂಕವನ್ನು ಮತ್ತೊಮ್ಮೆ ಹೆಚ್ಚಿಸಲು ಪ್ರಸ್ತಾಪಿಸಿರುವುದಾಗಿ ವರದಿಯಾಗಿತ್ತು. ಪ್ರತಿ 650 ಮಿಲಿ ಬಿಯರ್ ಬಾಟಲಿಗೆ 8-10 ರೂ. ವರೆಗೆ ದರ ಹೆಚ್ಚಾಗಲಿದೆ ಎಂದು ನಿರೀಕ್ಷಿಸಲಾಗಿದೆ. ‘ಕರ್ನಾಟಕ ಅಬಕಾರಿ (ಅಬಕಾರಿ ಸುಂಕ ಮತ್ತು ಶುಲ್ಕಗಳು) ನಿಯಮಗಳು, 1968’ಕ್ಕೆ ತಿದ್ದುಪಡಿ ಮಾಡಲು ಕರಡು ಅಧಿಸೂಚನೆ ರೂಪಿಸಲಾಗಿದ್ದು, ಇದರಲ್ಲಿ ದರ ಹೆಚ್ಚಳವನ್ನು ಪ್ರಸ್ತಾಪಿಸಲಾಗಿತ್ತು. ದರ ಹೆಚ್ಚಳಕ್ಕೆ ಅವಕಾಶ ನೀಡುವ ಹೊಸ ನಿಯಮಗಳು ಈ ತಿಂಗಳ ಕೊನೆಯಲ್ಲಿ ಅಥವಾ ಫೆಬ್ರವರಿ ಆರಂಭದಲ್ಲಿ ಅಂತಿಮಗೊಳ್ಳುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿದ್ದವು.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
ಬಜೆಟ್ ಕುರಿತು ಹೆಚ್ಚಿನ ಮಾಹಿತಿ ತಿಳಿಯಲು ಇಲ್ಲಿ ಕ್ಲಿಕ್ ಮಾಡಿ
Published On - 10:50 am, Fri, 16 February 24