ಡಿಕೆ ಶಿವಕುಮಾರ್ ಸಂಪುಟದ ಸಚಿವರ ಪಟ್ಟಿ ಫೈನಲ್: ಅಳೆದು ತೂಗಿ ಲಿಸ್ಟ್ ಅಂತಿಮಗೊಳಿಸಿದ ರಾಹುಲ್ ಗಾಂಧಿ

ಕರ್ನಾಟಕ ಸಚಿವ ಸಂಪುಟ ವಿಸ್ತರಣೆ: ಮುಖ್ಯಮಂತ್ರಿ ಡಿಕೆ ಶಿವಕುಮಾರ್ ನೇತೃತ್ವದ ಸರ್ಕಾರದ ಸಚಿವ ಸಂಪುಟ ವಿಸ್ತರಣೆ ಅಂತಿಮ ಹಂತ ತಲುಪಿರುವ ಲಕ್ಷಣಗಳು ಕಂಡುಬಂದಿವೆ. ದೆಹಲಿಯಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಡಿಕೆಶಿ, ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ಅವರೊಂದಿಗೆ ಪ್ರತ್ಯೇಕ ಸಭೆ ನಡೆಸಿ ಸಚಿವರ ಪಟ್ಟಿ ಅಂತಿಮಗೊಳಿಸಿದ್ದಾರೆ ಎಂಬುದು ತಿಳಿದುಬಂದಿದೆ.

ಡಿಕೆ ಶಿವಕುಮಾರ್ ಸಂಪುಟದ ಸಚಿವರ ಪಟ್ಟಿ ಫೈನಲ್: ಅಳೆದು ತೂಗಿ ಲಿಸ್ಟ್ ಅಂತಿಮಗೊಳಿಸಿದ ರಾಹುಲ್ ಗಾಂಧಿ
ದೆಹಲಿಯಲ್ಲಿ ಕಾಂಗ್ರೆಸ್ ಹೈಕಮಾಂಡ್ ನಾಯಕರು ಹಾಗೂ ಮಾಜಿ ಸಿಎಂ ಸಿದ್ದರಾಮಯ್ಯ, ಸಿಎಂ ಡಿಕೆ ಶಿವಕುಮಾರ್ ಸಭೆ
Image Credit source: @kcvenugopalmp
Edited By:

Updated on: Jul 17, 2026 | 7:42 AM

ಮುಖ್ಯಾಂಶಗಳು

  • ರಾಹುಲ್ ಜತೆ ರಾಜ್ಯ ನಾಯಕರ ಪ್ರತ್ಯೇಕ ಸಭೆ
  • 20 ಸಚಿವ ಸ್ಥಾನಗಳಿಗೆ ತೀವ್ರ ಪೈಪೋಟಿ
  • ಅಧಿವೇಶನಕ್ಕೂ ಮುನ್ನ ಸಂಪುಟ ವಿಸ್ತರಣೆ ಸಾಧ್ಯತೆ

ನವದೆಹಲಿ, ಜುಲೈ 17: ಮೊದಲ ಹಂತದಲ್ಲಿ ಮುಖ್ಯಮಂತ್ರಿ ಡಿಕೆ ಶಿವಕುಮಾರ್ (DK Shivakumar) ಅವರೊಂದಿಗೆ 13 ಮಂದಿ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ್ದರು. ಆದರೆ, ಒಂದೂವರೆ ತಿಂಗಳು ಕಳೆದರೂ ಸಚಿವ ಸಂಪುಟ ವಿಸ್ತರಣೆ (Cabinet Expansion) ಆಗದಿರುವುದು ಕಾಂಗ್ರೆಸ್ (Congress) ವಲಯದಲ್ಲಿ ಕುತೂಹಲಕ್ಕೆ ಕಾರಣವಾಗಿತ್ತು. ಖಾಲಿ ಇರುವ 20 ಸಚಿವ ಸ್ಥಾನಗಳಿಗೆ 50ಕ್ಕೂ ಹೆಚ್ಚು ಶಾಸಕರು ಮತ್ತು ನಾಯಕರು ಆಕಾಂಕ್ಷಿಗಳಾಗಿದ್ದು, ಅಂತಿಮ ತೀರ್ಮಾನಕ್ಕಾಗಿ ದೆಹಲಿಯಲ್ಲಿ ಸರಣಿ ಸಭೆಗಳು ನಡೆದಿವೆ. ದೆಹಲಿಯಲ್ಲಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ನಿವಾಸದಲ್ಲಿ ಗುರುವಾರ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ಅವರೊಂದಿಗೆ ರಾಹುಲ್ ಗಾಂಧಿ ಪ್ರತ್ಯೇಕವಾಗಿ ಮಾತುಕತೆ ನಡೆಸಿದ್ದಾರೆ. ಮೊದಲಿಗೆ ಸಿದ್ದರಾಮಯ್ಯ, ಬಳಿಕ ಡಿ.ಕೆ. ಶಿವಕುಮಾರ್ ಹಾಗೂ ಅಂತಿಮವಾಗಿ ಬಿ.ಕೆ. ಹರಿಪ್ರಸಾದ್ ಅವರೊಂದಿಗೆ ಸಭೆ ನಡೆಸಿ ಸಚಿವ ಸಂಪುಟ ವಿಸ್ತರಣೆ ಕುರಿತು ಸಮಾಲೋಚನೆ ನಡೆಸಿದ್ದು, ತಮ್ಮದೇ ಆದ ಪಟ್ಟಿ ಸಿದ್ಧಪಡಿಸಿದ್ದಾರೆ ಎಂಬುದು ತಿಳಿದುಬಂದಿದೆ.

ಮೂಲಗಳ ಪ್ರಕಾರ, ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ಪ್ರತ್ಯೇಕ ಸಚಿವರ ಪಟ್ಟಿಯನ್ನು ರಾಹುಲ್ ಗಾಂಧಿ ಅವರಿಗೆ ಸಲ್ಲಿಸಿದ್ದಾರೆ. ಇದರ ಜೊತೆಗೆ ಕಾಂಗ್ರೆಸ್ ಹೈಕಮಾಂಡ್ ಸಿದ್ಧಪಡಿಸಿದ್ದ ಮತ್ತೊಂದು ಪಟ್ಟಿಯನ್ನೂ ಪರಿಶೀಲಿಸಿ, ವಿವಿಧ ಅಂಶಗಳನ್ನು ಪರಿಗಣಿಸಿ ಅಂತಿಮ ರೂಪುರೇಷೆ ಸಿದ್ಧಪಡಿಸಲಾಗಿದೆ ಎನ್ನಲಾಗಿದೆ. ಇದೇ ಸಭೆಯಲ್ಲಿ ಖಾಲಿ ಇರುವ ವಿಧಾನಸಭೆ ಸ್ಪೀಕರ್ ಹುದ್ದೆ ಭರ್ತಿ ಕುರಿತೂ ಚರ್ಚೆ ನಡೆದಿದೆ ಎಂದು ತಿಳಿದುಬಂದಿದೆ.

ಖರ್ಗೆ ಜತೆ ಚರ್ಚೆಯ ಬಳಿಕ ಅಂತಿಮ ನಿರ್ಧಾರ ಸಾಧ್ಯ

ದೆಹಲಿಯಲ್ಲೇ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರೊಂದಿಗೂ ರಾಜ್ಯ ನಾಯಕರು ಸಭೆ ನಡೆಸುವ ಸಾಧ್ಯತೆ ಇತ್ತು. ಆದರೆ, ಅವರು ತುರ್ತಾಗಿ ಬೆಂಗಳೂರಿಗೆ ಪ್ರಯಾಣ ಬೆಳೆಸಿದ ಕಾರಣ ಆ ಸಭೆ ನಡೆಯಲಿಲ್ಲ. ಇದೀಗ ರಾಹುಲ್ ಗಾಂಧಿ ಪರಿಶೀಲಿಸಿರುವ ಪಟ್ಟಿಯನ್ನು ಖರ್ಗೆ ಅವರೊಂದಿಗೆ ಚರ್ಚಿಸಿದ ಬಳಿಕ ಸಚಿವ ಸಂಪುಟ ವಿಸ್ತರಣೆಯ ದಿನಾಂಕ ನಿಗದಿಯಾಗುವ ಸಾಧ್ಯತೆ ಇದೆ. ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ಅವರು ಸಹ ಸಚಿವ ಸಂಪುಟ ವಿಸ್ತರಣೆ ಕುರಿತು ಚರ್ಚೆಗಳು ನಡೆದಿರುವುದನ್ನು ದೃಢಪಡಿಸಿದ್ದು, ಅಂತಿಮ ನಿರ್ಧಾರವನ್ನು ಪಕ್ಷದ ವರಿಷ್ಠರು ಕೈಗೊಳ್ಳಲಿದ್ದಾರೆ ಎಂದು ತಿಳಿಸಿದ್ದಾರೆ.

ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಕೂಡ, ಸಚಿವ ಸಂಪುಟ ವಿಸ್ತರಣೆ ಶೀಘ್ರದಲ್ಲೇ ನಡೆಯಲಿದೆ. ಆಗಸ್ಟ್ 6ರಿಂದ ಆರಂಭವಾಗಲಿರುವ ಮುಂಗಾರು ಅಧಿವೇಶನಕ್ಕೂ ಮುನ್ನ ಪ್ರಕ್ರಿಯೆ ಪೂರ್ಣಗೊಳಿಸಲು ಪ್ರಯತ್ನಿಸಲಾಗುತ್ತಿದೆ ಎಂದು ಹೇಳಿದ್ದಾರೆ. 20 ಸಚಿವ ಸ್ಥಾನಗಳು ಹಾಗೂ ಸ್ಪೀಕರ್ ಹುದ್ದೆ ಕುರಿತು ಚರ್ಚೆಗಳು ನಡೆಯುತ್ತಿದ್ದು, ಸೂಕ್ತ ಸಮಯದಲ್ಲಿ ಅಂತಿಮ ಘೋಷಣೆ ಮಾಡಲಾಗುವುದು ಎಂದು ತಿಳಿಸಿದ್ದಾರೆ.

ಯುವ ಮುಖಗಳು ಮತ್ತು ಮಹಿಳಾ ಪ್ರತಿನಿಧಿತ್ವಕ್ಕೆ ಒತ್ತು?

ಸಂಪುಟ ವಿಸ್ತರಣೆಯಲ್ಲಿ ಯುವ ನಾಯಕರಿಗೆ ಹೆಚ್ಚಿನ ಆದ್ಯತೆ ನೀಡುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ. ಜೊತೆಗೆ ಪ್ರಸ್ತುತ ಸಚಿವ ಸಂಪುಟದಲ್ಲಿ ಮಹಿಳಾ ಸದಸ್ಯರಿಲ್ಲದ ಹಿನ್ನೆಲೆಯಲ್ಲಿ ಕನಿಷ್ಠ ಒಬ್ಬ ಮಹಿಳಾ ಸಚಿವೆಯನ್ನು ಸೇರಿಸುವ ಸಾಧ್ಯತೆಯೂ ಚರ್ಚೆಯಲ್ಲಿದೆ. ಮಾಜಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್, ಟಿ.ಬಿ. ಜಯಚಂದ್ರ, ಲಕ್ಷ್ಮಣ ಸವದಿ, ಕಾಶಪ್ಪನವರ್ ಸೇರಿದಂತೆ ಹಲವು ನಾಯಕರು ಸಚಿವ ಸ್ಥಾನಕ್ಕಾಗಿ ಲಾಬಿ ನಡೆಸುತ್ತಿದ್ದಾರೆ. ಮತ್ತೊಂದೆಡೆ, ಪ್ರಾದೇಶಿಕ ಸಮತೋಲನ ಕಾಪಾಡುವ ಉದ್ದೇಶದಿಂದ ವಿವಿಧ ಜಿಲ್ಲೆಗಳಿಗೆ ಪ್ರಾತಿನಿಧ್ಯ ನೀಡಬೇಕೆಂಬ ಒತ್ತಾಯವೂ ಕೇಳಿಬಂದಿದೆ.

ಇದನ್ನೂ ಓದಿ: ಸಂಪುಟ ವಿಸ್ತರಣೆ: ದೆಹಲಿಯಲ್ಲಿ ಮಹತ್ವದ ಸಭೆ, ಯಾರಿಗೆಲ್ಲಾ ಮಂತ್ರಿ ಸ್ಥಾನ?

ಸದ್ಯ ರಾಹುಲ್ ಗಾಂಧಿ ಅವರೊಂದಿಗೆ ನಡೆದ ಸಭೆಗಳ ಬಳಿಕ ಸಚಿವರ ಪಟ್ಟಿಗೆ ಅಂತಿಮ ರೂಪ ಸಿಕ್ಕಿದೆಯೇ ಎಂಬ ಕುತೂಹಲ ರಾಜಕೀಯ ವಲಯದಲ್ಲಿ ಮನೆ ಮಾಡಿದೆ. ಸಿದ್ದರಾಮಯ್ಯ ಹಾಗೂ ಡಿ.ಕೆ. ಶಿವಕುಮಾರ್ ಬಣದ ನಾಯಕರಲ್ಲಿ ಯಾರಿಗೆ ಹೆಚ್ಚು ಅವಕಾಶ ದೊರೆಯಲಿದೆ ಎಂಬುದು ಸಂಪುಟ ವಿಸ್ತರಣೆಯ ಘೋಷಣೆಯ ಬಳಿಕ ಸ್ಪಷ್ಟವಾಗಲಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಪ್ರಸನ್ನ ಗಾಂವ್ಕರ್​

ಹುಟ್ಟೂರು ಯಲ್ಲಾಪುರ, ಬೆಳೆದೂರು ದಾಂಡೇಲಿಯ ದಟ್ಟ ಕಾಡುಗಳ ನಡುವೆ. ರವಿ ಬೆಳಗೆರೆ ಎಂಬ ಅಕ್ಷರ ರಾಕ್ಷಸನ ಕಟ್ಟಾಭಿಮಾನದಿಂದ ಹಾಳಾಗಿ, ಸೈನ್ಸ್ ನಲ್ಲಿ ಡಿಗ್ರಿ ಪಡೆದು ಜರ್ನಲಿಸಂಗೆ ಹಿಂಬದಿ ಕಿಟಕಿಯಿಂದ ನುಸುಳಿದ್ದು 2010 ರ ಅಕ್ಟೋಬರ್ ನಲ್ಲಿ. ಉಡುಪಿಯಲ್ಲಿ ಮೊದಲ ಪತ್ರಿಕೋದ್ಯಮ ಕರ್ತವ್ಯ ಪ್ರಾರಂಭಿಸಿದ್ದು 2010 ರಲ್ಲಿಯೇ. ಜನಶ್ರೀ ನ್ಯೂಸ್ ಮೊದಲು ಅನ್ನ ನೀಡಿದ ಸಂಸ್ಥೆ. ಉಡುಪಿ ಜಿಲ್ಲಾ ವರದಿಗಾರನಾಗಿ ಮೂರು ವರ್ಷ ಕೆಲಸ ಮಾಡಿ 2013 ರ ಅಂತ್ಯಕ್ಕೆ ಸಮಯ ನ್ಯೂಸ್ ಮೂಲಕ ಬೆಂಗಳೂರಿಗೆ ಎಂಟ್ರಿ. ಬಿಗ್ ೩, ಬೆಂಗಳೂರ್ ಲೈವ್, ಸಮಯ ಸಕಾಲ ಕಾರ್ಯಕ್ರಮದಲ್ಲಿ ವರದಿಗಾರಿಕೆ ಮಾಡಿದ ಖುಷಿ. 2014 ರ ಡಿಸೆಂಬರ್ ನಿಂದ ಟಿವಿ9 ನಲ್ಲಿ ಕೆಲಸ ಪ್ರಾರಂಭ. ಟಿವಿ9 ನಲ್ಲಿ ಮೊದಲು ಮೆಟ್ರೋ ರಿಪೋರ್ಟಿಂಗ್ ಮೂಲಕ ಬೆಂಗಳೂರು ಸುತ್ತುವ ಅರಿಯುವ ರಾಜಧಾನಿಯ ನಾಡಿಮಿಡಿತ ಹುಡುಕುವ ಅವಕಾಶ. ಮೆಟ್ರೋ ಬ್ಯೂರೋ ದಲ್ಲಿ ಶೈಕ್ಷಣಿಕ ಹಾಗೂ ಬಿಬಿಎಂಪಿ ವರದಿಗಾರಿಕೆ. ಚಪ್ಪಲಿಯಿಂದ ಹಿಡಿದು ಚಾದರ್ ತನಕ ಸ್ಟೋರಿ ಮಾಡಿದ ಅನುಭವ. ಮೆಟ್ರೋ ಟೀಂ ನಿಂದ ರಾಜಕೀಯ ವರದಿಗಾರಿಕೆಗೆ ಶಿಫ್ಟ್ ಆದ ತಕ್ಷಣ- ಮುಂದುವರಿದಿದೆ ನಿರಂತರ ಪಯಣ. ಕಥೆ, ಕಾದಂಬರಿ, ಕವನ, ಸಿನಿಮಾ, ಸುತ್ತಾಟ, ಆಗಾಗ ಕಿತ್ತಾಟ, ಸ್ನೇಹಿತರೊಂದಿಗೆ ಒಡನಾಟ ಇವೆಲ್ಲ ಮಾಮೂಲಿ ದಿನಚರಿ. ಇವತ್ತಿಗೂ ಬರವಣಿಗೆಯೊಂದೇ ಖುಷಿ ಕೊಡುವ ಖರ್ಜೂರ. ಸ್ಟಾಕ್ ಮಾರ್ಕೆಟ್ ನಲ್ಲಿ 2019 ರಿಂದ ಆ್ಯಕ್ಟಿವ್.

Read More
Loading...
Unable to load recommendations.
Follow Us