
ಬೆಂಗಳೂರು, ಮೇ 30: ಕರ್ನಾಟಕ ಕಾಂಗ್ರೆಸ್‌ನಲ್ಲಿ (Congress) ಮುಖ್ಯಮಂತ್ರಿ ಬದಲಾವಣೆಯ ಬೆನ್ನಲ್ಲೇ ಇದೀಗ ನೂತನ ಸಚಿವ ಸಂಪುಟ ರಚನೆ ಹಾಗೂ ಉಪಮುಖ್ಯಮಂತ್ರಿ (DCM) ಹುದ್ದೆಗಳ ಸೃಷ್ಟಿಯ ವಿಚಾರ ಹೈಕಮಾಂಡ್‌ಗೆ ದೊಡ್ಡ ತಲೆನೋವಾಗಿ ಪರಿಣಮಿಸಿದೆ ಎಂಬುದು ತಿಳಿದುಬಂದಿದೆ. ರಾಜ್ಯದಲ್ಲಿ ಆಡಳಿತ ಸಮತೋಲನ ಕಾಯ್ದುಕೊಳ್ಳಲು ಹಾಗೂ ಮುಂಬರುವ ಲೋಕಸಭಾ ಚುನಾವಣೆಗಳನ್ನು ದೃಷ್ಟಿಯಲ್ಲಿಟ್ಟುಕೊಂಡು ಬರೋಬ್ಬರಿ 4 ಡಿಸಿಎಂ ಹುದ್ದೆಗಳನ್ನು ಸೃಷ್ಟಿಸಲು ಎಐಸಿಸಿ (AICC) ಗಂಭೀರ ಚಿಂತನೆ ನಡೆಸಿದೆ. ಆದರೆ, ಪ್ರಮುಖ ಸಮುದಾಯಗಳ ಪ್ರಭಾವಿ ನಾಯಕರುಗಳು ಡಿಸಿಎಂ ಹುದ್ದೆಗಾಗಿ ದೆಹಲಿ ಮಟ್ಟದಲ್ಲಿ ತೀವ್ರ ಲಾಬಿ ನಡೆಸುತ್ತಿರುವುದರಿಂದ, ಯಾರಿಗೆ ಸ್ಥಾನ ನೀಡಿದರೂ ಅಸಮಾಧಾನ ಸ್ಫೋಟಗೊಳ್ಳುವ ಭೀತಿಯಲ್ಲಿ ಹೈಕಮಾಂಡ್ ಸಂದಿಗ್ಧ ಸ್ಥಿತಿಗೆ ತಲುಪಿದೆ.
ಕಾಂಗ್ರೆಸ್ ಮೂಲಗಳ ಪ್ರಕಾರ, ಒಬಿಸಿ, ಲಿಂಗಾಯತ, ಮುಸ್ಲಿಂ ಹಾಗೂ ದಲಿತ ಸಮುದಾಯಗಳಿಗೆ ತಲಾ ಒಂದು ಡಿಸಿಎಂ ಹುದ್ದೆ ನೀಡಲು ಹೈಕಮಾಂಡ್ ಪ್ಲಾನ್ ಮಾಡಿತ್ತು. ಆದರೆ ಪ್ರತಿಯೊಂದು ಕೋಟಾದಲ್ಲೂ ನಾಯಕರ ನಡುವೆ ದೊಡ್ಡ ಜಿದ್ದಾಜಿದ್ದಿ ಶುರುವಾಗಿದೆ.
ಈ ಕೋಟಾದಡಿ ಮಾಜಿ ಸಿಎಂ ಸಿದ್ದರಾಮಯ್ಯ ಅವರ ಪುತ್ರ ಡಾ. ಯತೀಂದ್ರ ಸಿದ್ದರಾಮಯ್ಯ ಅವರಿಗೆ ಸ್ಥಾನ ನೀಡಲು ಆಲೋಚಿಸಲಾಗಿದೆ. ಆದರೆ, ಇವರಿಗೆ ನೀಡಿದರೆ ಪಕ್ಷದಲ್ಲಿ ಭಿನ್ನ ಸಂದೇಶ ರವಾನೆಯಾಗಬಹುದು ಎಂಬ ಆತಂಕ ಹೈಕಮಾಂಡ್ ಅನ್ನು ಕಾಡುತ್ತಿದೆ.
ಹಿರಿಯ ನಾಯಕರಾದ ಎಂ.ಬಿ. ಪಾಟೀಲ್ ಮತ್ತು ಈಶ್ವರ ಖಂಡ್ರೆ ನಡುವೆ ತೀವ್ರ ಪೈಪೋಟಿ ಏರ್ಪಟ್ಟಿದೆ.
ಸಚಿವ ಬಿ.ಝೆಡ್. ಜಮೀರ್ ಅಹ್ಮದ್ ಖಾನ್ ಅವರಿಗೆ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಬೆಂಬಲವಿದ್ದರೆ, ಮತ್ತೊಂದೆಡೆ ಸ್ಪೀಕರ್ ಯು.ಟಿ. ಖಾದರ್ ಅವರಿಗೆ ಕೇರಳದ ಪ್ರಭಾವಿ ಧಾರ್ಮಿಕ ಗುರುಗಳ ಬೆಂಬಲವಿದ್ದು, ಇಬ್ಬರ ನಡುವೆ ಭಾರಿ ಪೈಪೋಟಿ ನಡೆದಿದೆ.
ಹಿರಿಯ ನಾಯಕ ಡಾ. ಜಿ. ಪರಮೇಶ್ವರ್ ಮತ್ತು ಪ್ರಿಯಾಂಕ್ ಖರ್ಗೆ ನಡುವೆ ಜಟಾಪಟಿ ಆರಂಭವಾಗಿದೆ. ಯುವ ನಾಯಕ ಪ್ರಿಯಾಂಕ್‌ಗೆ ಸ್ಥಾನ ನೀಡಿದರೆ ಪರಮೇಶ್ವರ್ ಅಸಮಾಧಾನಗೊಳ್ಳುವ ಸಾಧ್ಯತೆಯಿದೆ. ಅಲ್ಲದೆ ದಲಿತ ಸಮುದಾಯದಲ್ಲಿ ಎಡಗೈ ಮತ್ತು ಬಲಗೈ ಪಂಗಡಗಳ ಸಮೀಕರಣದ ಪ್ರಶ್ನೆಯೂ ಉದ್ಭವಿಸಿದೆ. ಹೀಗಾಗಿ ಇಂದು ನಡೆಯಲಿರುವ ಶಾಸಕಾಂಗ ಪಕ್ಷದ (CLP) ಸಭೆಯ ಬಳಿಕವೇ ಎಲ್ಲಾ ಆಯಾಮಗಳನ್ನು ಅಳೆದು ತೂಗಿ ಹೈಕಮಾಂಡ್ ಅಂತಿಮ ನಿರ್ಧಾರ ಪ್ರಕಟಿಸಲಿದೆ.
ಇನ್ನೊಂದೆಡೆ, ತೆರವಾಗಲಿರುವ ಕೆಪಿಸಿಸಿ ಅಧ್ಯಕ್ಷ ಗಾದಿಯ ರೇಸ್‌ನಲ್ಲಿ ದೊಡ್ಡ ರಾಜಕೀಯ ಹಲ್ಚಲ್ ಸೃಷ್ಟಿಯಾಗಿದೆ. ಈ ಮುಂಚೆ ಸತೀಶ್ ಜಾರಕಿಹೊಳಿ ಅವರ ಹೆಸರು ಮುಂಚೂಣಿಯಲ್ಲಿದ್ದರೂ, ಅವರು ಸಂಪುಟದಲ್ಲಿ ಸಚಿವ ಸ್ಥಾನದ ಜೊತೆಗೇ ಅಧ್ಯಕ್ಷ ಸ್ಥಾನ ಬೇಕು ಎಂದು ಪಟ್ಟು ಹಿಡಿದಿದ್ದಾರೆ ಎನ್ನಲಾಗಿದೆ. ಅಧಿಕಾರವಿಲ್ಲದ ಬರಿ ಅಧ್ಯಕ್ಷ ಸ್ಥಾನ ಒಪ್ಪಲು ಅವರು ನಿರಾಕರಿಸಿದ್ದಾರೆ. ಈ ಬೆಳವಣಿಗೆಯ ಬೆನ್ನಲ್ಲೇ ಒಬಿಸಿ ಕೋಟಾದಡಿ ಹಿರಿಯ ನಾಯಕ ಬಿ.ಕೆ. ಹರಿಪ್ರಸಾದ್ ಅವರ ಹೆಸರು ಅನಿರೀಕ್ಷಿತವಾಗಿ ಮುನ್ನೆಲೆಗೆ ಬಂದಿದೆ. ಹರಿಪ್ರಸಾದ್ ಅವರಿಗೆ ಕೆ.ಸಿ. ವೇಣುಗೋಪಾಲ್ ಅವರ ಸಂಪೂರ್ಣ ಬೆಂಬಲವಿದ್ದು, ಹೈಕಮಾಂಡ್ ಎದುರು ಅವರ ಹೆಸರನ್ನು ಪ್ರಸ್ತಾಪಿಸಲಾಗಿದೆ.
ಇದನ್ನೂ ಓದಿ: ಕರ್ನಾಟಕದ ನೂತನ ಸಿಎಂ ಆಯ್ಕೆಗೆ ಕ್ಷಣಗಣನೆ: ಇಂದು ಸಂಜೆ 4ಕ್ಕೆ ಕಾಂಗ್ರೆಸ್ ಶಾಸಕಾಂಗ ಪಕ್ಷದ ಮಹತ್ವದ ಸಭೆ
ಇಂದು ಸಂಜೆ ನಡೆಯಲಿರುವ ಶಾಸಕಾಂಗ ಸಭೆಯಲ್ಲಿ ಹಿರಿಯ ಶಾಸಕರ ಮೂಲಕ ಬಿ.ಕೆ. ಹರಿಪ್ರಸಾದ್ ಅವರ ಹೆಸರನ್ನು ಅಧಿಕೃತವಾಗಿ ಪ್ರಸ್ತಾಪಿಸಿ ಒಮ್ಮತ ಮೂಡಿಸಲು ಹೈಕಮಾಂಡ್ ತೆರೆಮರೆಯ ತಂತ್ರ ರೂಪಿಸಿದ್ದು, ರಾಜ್ಯ ರಾಜಕಾರಣದಲ್ಲಿ ಭಾರಿ ಕುತೂಹಲ ಮೂಡಿಸಿದೆ.
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ