AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸರ್ಕಾರಿ ಕಾಮಗಾರಿಗಳಲ್ಲಿ ಮುಸ್ಲಿಮರಿಗೆ ಮೀಸಲಾತಿ: ಕಾಯ್ದೆ ತಿದ್ದುಪಡಿಗೆ ಸಿಎಂ ಸಿದ್ದರಾಮಯ್ಯ ಸೂಚನೆ

ಕರ್ನಾಟಕ ಸರ್ಕಾರವು ಸರ್ಕಾರಿ ಸಿವಿಲ್ ಕಾಮಗಾರಿಗಳ 1 ಕೋಟಿ ರೂ. ವರೆಗಿನ ಗುತ್ತಿಗೆಗಳಲ್ಲಿ ಮುಸ್ಲಿಂ ಸಮುದಾಯಕ್ಕೆ ಶೇಕಡಾ 4ರಷ್ಟು ಮೀಸಲಾತಿ ನೀಡಲು ಮುಂದಾಗಿದೆ. ಮುಖ್ಯಮಂತ್ರಿಗಳು ಈ ಪ್ರಸ್ತಾವನೆಗೆ ಅನುಮೋದನೆ ನೀಡಿದ್ದು, ಕಾಯ್ದೆಗೆ ತಿದ್ದುಪಡಿಗೆ ಸೂಚನೆ ನೀಡಿದ್ದಾರೆ. ಈ ನಿರ್ಧಾರಕ್ಕೆ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ.

ಸರ್ಕಾರಿ ಕಾಮಗಾರಿಗಳಲ್ಲಿ ಮುಸ್ಲಿಮರಿಗೆ ಮೀಸಲಾತಿ: ಕಾಯ್ದೆ ತಿದ್ದುಪಡಿಗೆ ಸಿಎಂ ಸಿದ್ದರಾಮಯ್ಯ ಸೂಚನೆ
ಸಿದ್ದರಾಮಯ್ಯ
ಪ್ರಸನ್ನ ಗಾಂವ್ಕರ್​
| Edited By: |

Updated on:Nov 12, 2024 | 11:15 AM

Share

ಬೆಂಗಳೂರು, ನವೆಂಬರ್ 12: ಮಹತ್ವದ ಬೆಳವಣಿಗೆಯೊಂದರಲ್ಲಿ, ಸರ್ಕಾರದ ಸಿವಿಲ್ ಕಾಮಗಾರಿಗಳ ಗುತ್ತಿಗೆಯಲ್ಲಿ ಮುಸ್ಲಿಮರಿಗೆ ಮೀಸಲಾತಿ ಕಲ್ಪಿಸುವ ಪ್ರಸ್ತಾವನೆ ಸಿಎಂ ಸಿದ್ದರಾಮಯ್ಯ ಸರ್ಕಾರದ ಮುಂದಿರುವುದು ತಿಳಿದುಬಂದಿದೆ. ಮುಸ್ಲಿಂ ಸಮುದಾಯಕ್ಕೆ ಸರ್ಕಾರದ ಗುತ್ತಿಗೆಯಲ್ಲಿ ಮೀಸಲಾತಿ ತರಲು ಸಲ್ಲಿಕೆಯಾಗಿರುವ ಪ್ರಸ್ತಾವನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅನುಮೋದನೆ ನೀಡಿದ್ದಾರೆ ಎನ್ನಲಾಗಿದ್ದು, ಕಾಯ್ದೆಯಲ್ಲಿ ಸಂಬಂಧಿತ ತಿದ್ದುಪಡಿ ಮಾಡುವಂತೆ ಹಣಕಾಸು ಇಲಾಖೆಗೆ ಸೂಚನೆ ನೀಡಿದ್ದಾರೆ ಎನ್ನಲಾಗಿದೆ.

1 ಕೋಟಿ ರೂ. ವರೆಗಿನ ಕಟ್ಟಡ ನಿರ್ಮಾಣ ಕಾಮಗಾರಿಗಳ ಸಾರ್ವಜನಿಕ ಗುತ್ತಿಗೆಯಲ್ಲಿ ಮುಸ್ಲಿಂ ಸಮುದಾಯವರಿಗೆ ಶೇ 4 ಮೀಸಲಾತಿ ನೀಡುವ ಬಗ್ಗೆ ಅಲ್ಪಸಂಖ್ಯಾತ ಕಲ್ಯಾಣ ಇಲಾಖೆ ಪ್ರಸ್ತಾವನೆ ಸಲ್ಲಿಸಿತ್ತು. ಇದಕ್ಕೆ ಅನುಮೋದನೆ ನೀಡಿರುವ ಸಿಎಂ, ತಿದ್ದುಪಡಿಗೆ ಸೂಚನೆ ನೀಡಿದ್ದಾರೆ.

ಬೆಳಗಾವಿ ಅಧಿವೇಶನದಲ್ಲಿ ತಿದ್ದುಪಡಿ ಕಾಯ್ದೆ ಮಂಡನೆ ಸಾಧ್ಯತೆ

ಬೆಳಗಾವಿಯಲ್ಲಿ ನಡೆಯಲಿರುವ ಚಳಿಗಾಲದ ಅಧಿವೇಶನದ ವೇಳೆ ಕಾಯ್ದೆಗೆ ತಿದ್ದುಪಡಿ ತಂದು ಮಂಡನೆ ಮಾಡಲು ಸರ್ಕಾರ ಮುಂದಾಗಿದೆ. ಈಗಾಗಲೇ ಎಸ್‌ಸಿ ಎಸ್‌ಟಿ ಸಮುದಾಯಕ್ಕೆ ಗುತ್ತಿಗೆಯಲ್ಲಿ ಶೇ 24ರ ಮೀಸಲಾತಿ ನೀಡಿರುವ ಸರ್ಕಾರ, ಒಬಿಸಿ ಸಮುದಾಯಕ್ಕೆ ಶೇ 4 ಮೀಸಲಾತಿ ನೀಡಿದೆ. 2A ಅಡಿ ಗುತ್ತಿಗೆಯಲ್ಲಿ ಶೇ 15 ಮೀಸಲಾತಿ ನೀಡಲಾಗಿದೆ. ಒಟ್ಟು ಸರ್ಕಾರದ ಕಾಮಗಾರಿಗಳಲ್ಲಿ ಶೇ 43ರಷ್ಟು ಮೀಸಲಾತಿ ನೀಡಲಾಗಿದೆ. ಈಗ ಮುಸ್ಲಿಂ ಸಮುದಾಯಕ್ಕೂ ಸರ್ಕಾರದ ಕಾಮಗಾರಿಗಳಲ್ಲಿ ಶೇ 4 ರಷ್ಟು ಮೀಸಲಾತಿ ನೀಡಲು ಮುಂದಾಗಿದೆ.

ಸಿಎಂಗೆ ಮನವಿ ಮಾಡಿದ್ದ ಮುಸ್ಲಿಂ ಶಾಸಕ, ಸಚಿವರು

ಪ್ರವರ್ಗ 2ಬಿ ಅಡಿ 1 ಕೋಟಿ ರೂ. ವರೆಗಿನ ಕಾಮಗಾರಿಗಳಲ್ಲಿ ಮುಸ್ಲಿಮರಿಗೆ ಮೀಸಲಾತಿ ನೀಡುವಂತೆ ಆಗ್ರಹಿಸಿ ಮುಸ್ಲಿಂ ಸಚಿವರು ಮತ್ತು ಶಾಸಕರು ಸಿಎಂ ಸಿದ್ದರಾಮಯ್ಯಗೆ ಪತ್ರ ಬರೆದಿದ್ದರು. ಸಚಿವ ಜಮೀರ್ ಅಹ್ಮದ್ ಖಾನ್, ರಹೀಂ ಖಾನ್, ಸಿಎಂ ರಾಜಕೀಯ ಕಾರ್ಯದರ್ಶಿ ನಸೀರ್ ಅಹ್ಮದ್ ಪತ್ರ ಬರೆದಿದ್ದರು. ಈ ಪತ್ರಕ್ಕೆ ಪರಿಷತ್ ಮುಖ್ಯ ಸಚೇತಕ ಸಲೀಂ ಅಹ್ಮದ್, ಶಾಸಕರಾದ ತನ್ವೀರ್ ಸೇಠ್, ಅಬ್ದುಲ್ ಜಬ್ಬಾರ್, ಎನ್ ಎ ಹ್ಯಾರಿಸ್, ರಿಜ್ವಾನ್ ಅರ್ಷದ್, ಆಸೀಫ್ ಸೇಠ್, ಖನೀಜಾ ಫಾತಿಮಾ, ಇಕ್ಬಾಲ್ ಹುಸೇನ್, ಬಲ್ಕಿಸ್ ಬಾನು ಸಹಿ ಮಾಡಿದ್ದರು. ಇದರಂತೆ, ಕಾಯ್ದೆಗೆ ತಿದ್ದುಪಡಿ ಮಾಡಿ ಕಡತ ಮಂಡಿಸಲು ಸಿಎಂ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ.

ಉಪಚುನಾವಣೆಯಲ್ಲಿ ಮತ ಸೆಳೆಯಲು ಹೇಯ ನಡೆ: ಯತ್ನಾಳ್

ಸಂಡೂರು, ಚನ್ನಪಟ್ಟಣ ಮತ್ತು ಶಿಗ್ಗಾಂವಿ ಉಪಚುನಾವಣೆಗೂ ಮುನ್ನ ಮುಸ್ಲಿಂ ಮತಗಳ ಕ್ರೋಡೀಕರಣದ ಮೇಲೆ ಕಣ್ಣಿಟ್ಟಿರುವ ರಾಜ್ಯ ಸರ್ಕಾರದ ಹೇಯ ನಡೆ ಇದು ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಟ್ವೀಟ್ ಮೂಲಕ ಟೀಕಿಸಿದ್ದಾರೆ.

ಇದನ್ನೂ ಓದಿ: ಎಚ್​ಎಂಟಿ ಅರಣ್ಯ ಭೂಮಿ ವಿವಾದ: ನಿವೃತ್ತ ಐಎಎಸ್ ಅಧಿಕಾರಿ, ಹಾಲಿ ಐಎಫ್ಎಸ್ ಅಧಿಕಾರಿಗಳಿಗೆ ಶೋಕಾಸ್ ನೋಟಿಸ್

ಟೆಂಡರ್ ಅನ್ನು ಕೆಟಿಟಿಪಿ ಕಾಯ್ದೆಯ ಆಧಾರದ ಮೇಲೆ ನೀಡಬೇಕೇ ವಿನಹ ಜಾತಿ ಪರಿಗಣನೆಯ ಮೇಲೆ ಅಲ್ಲ. ಮುಖ್ಯಮಂತ್ರಿಗಳು ಬೂಟಾಟಿಕೆಯನ್ನಲ್ಲ, ಪ್ರಜಾಪ್ರಭುತ್ವವನ್ನು ಮತ್ತಷ್ಟು ಗಟ್ಟಿಗೊಳಿಸಬೇಕು ಎಂದು ಯತ್ನಾಳ್ ಹೇಳಿದ್ದಾರೆ.

ಕರ್ನಾಟಕದ  ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 11:10 am, Tue, 12 November 24