AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಂದಿನಿ ಹಾಲಿನ ದರ ಏರಿಕೆ ಮಾಡಿಲ್ಲ: ಸಿದ್ದರಾಮಯ್ಯ ಸ್ಪಷ್ಟನೆಯ ವಿವರ ಇಲ್ಲಿದೆ ನೋಡಿ

Nandini Milk Price Hike : ಕೆಎಂಎಫ್​ ಮತ್ತೆ ಹಾಲಿ ದರ ಏರಿಕೆ ಮಾಡಿದೆ. ಲೀಟರ್​ಗೆ 2 ರೂಪಾಯಿ ಹೆಚ್ಚಳ ಮಾಡಿದೆ. ಇದರಿಂದ ಆಕ್ರೋಶಗಳು ವ್ಯಕ್ತವಾಗುತ್ತಿವೆ. ಅದರಲ್ಲೂ ವಿಪಕ್ಷಗಳು ಸರ್ಕಾರದ ವಿರುದ್ಧ ಮುಗಿಬಿದ್ದಿದ್ದು, ಪ್ರತಿಭಟನೆಗೆ ಸಜ್ಜಾಗುತ್ತಿವೆ. ಇದರ ಮಧ್ಯ ಇದೀಗ ಖುದ್ದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹಾಲಿನ ದರ ಹೆಚ್ಚಳದ ಬಗ್ಗೆ ಸ್ಪಷ್ಟನೆ ನೀಡಿದ್ದಾರೆ. ಹಾಗಾದ್ರೆ, ಸಿಎಂ ನೀಡಿದ ಸ್ಪಷ್ಟನೆಯಲ್ಲಿ ಏನಿದೆ? ಎನ್ನುವ ವಿವರ ಈ ಕೆಳಗಿನಂತಿದೆ.

ನಂದಿನಿ ಹಾಲಿನ ದರ ಏರಿಕೆ ಮಾಡಿಲ್ಲ: ಸಿದ್ದರಾಮಯ್ಯ ಸ್ಪಷ್ಟನೆಯ ವಿವರ ಇಲ್ಲಿದೆ ನೋಡಿ
ಸಿಎಂ ಸಿದ್ದರಾಮಯ್ಯ
Anil Kalkere
| Edited By: |

Updated on: Jun 25, 2024 | 5:19 PM

Share

ಬೆಂಗಳೂರು, (ಜೂನ್ 25): ಕರ್ನಾಟಕದಲ್ಲಿ ಹಾಲಿನ ಉತ್ಪಾದನೆ ಹೆಚ್ಚಾಗಿದ್ದರಿಂದ ನಂದಿನಿ ಹಾಲಿನ ಪ್ಯಾಕೆಟ್‌ಗೆ ತಲಾ 50 ಮಿ.ಲೀ. ಹಾಲು ಹೆಚ್ಚಳ(Nandini Milk Price Hike )ಮಾಡಲಾಗಿದೆ. ಹೀಗಾಗಿ ಹೆಚ್ಚುವರಿ ಹಾಲಿಗೆ 2 ರೂ ದರ ನಿಗದಿಪಡಿಸಿ ಗ್ರಾಹಕರಿಂದ ಸಂಗ್ರಹಿಸಲಾಗುತ್ತಿದೆಯೇ ವಿನಃ ಹಾಲಿನ ಬೆಲೆಯಲ್ಲಿ ಏರಿಕೆ ಮಾಡಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (siddaramaiah) ಅವರು ಹಾಲಿನ ದರ ಹೆಚ್ಚಳಕ್ಕೆ ಸ್ಪಷ್ಟನೆ ನೀಡಿದ್ದಾರೆ. ಹಾಲಿನ ದರ ಏರಿಕೆ ಬೆನ್ನಲ್ಲೇ ಆಕ್ರೋಶ ವ್ಯಕ್ತವಾಗುತ್ತಿದ್ದಂತೆಯೇ ಸಿದ್ದರಾಮಯ್ಯ ಅವರು ಮಾಧ್ಯಮ ಪ್ರಕಟನೆ ಮೂಲಕ ಸ್ಪಷ್ಟನೆ ನೀಡಿದ್ದಾರೆ.

ಸಿಎಂ ಸ್ಪಷ್ಟನೆ ವಿವರ ಹೀಗಿದೆ

ಹೆಚ್ಚುವರಿ ಹಾಲಿಗೆ 2 ರೂ ದರ ನಿಗದಿಪಡಿಸಿ ಗ್ರಾಹಕರಿಂದ ಸಂಗ್ರಹಿಸಲಾಗುತ್ತಿದೆಯೇ ವಿನಃ ಹಾಲಿನ ಬೆಲೆಯಲ್ಲಿ ಏರಿಕೆ ಮಾಡಿಲ್ಲ. ಅರ್ಧ ಲೀ. ಹಾಲಿನ ಪ್ಯಾಕೇಟ್‌ ನಲ್ಲಿ ಮುಂದೆ 550 ML ಹಾಲು ಹಾಗೂ ಒಂದು ಲೀಟರ್‌ ಪ್ಯಾಕೇಟ್‌ ನಲ್ಲಿ 1,050 ML ಹಾಲು ಸಿಗಲಿದೆ. ಹಾಲು ಸಂಗ್ರಹಣಾ ಕೇಂದ್ರಗಳಲ್ಲಿ ಯಾವುದೇ ಕಾರಣಕ್ಕೂ ರೈತರು ಹೆಚ್ಚುವರಿಯಾಗಿ ತರುತ್ತಿರುವ ಹಾಲನ್ನು ನಿರಾಕರಿಸಬಾರದು ಎಂಬ ಸದುದ್ದೇಶದಿಂದ ಕೆಎಂಎಫ್‌ ಸಂಸ್ಥೆ ಪ್ಯಾಕೇಟ್‌ ಗಳಲ್ಲಿ ಹಾಲಿನ ಪ್ರಮಾಣವನ್ನು ಹೆಚ್ಚಳ ಮಾಡುವ ತೀರ್ಮಾನ ಮಾಡಿದೆ.

ಇದನ್ನೂ ಓದಿ: Nandini Milk Price Hike: ನಂದಿನಿ ಹಾಲಿನ ದರ ಹೆಚ್ಚಳ; ಕೆಎಂಎಫ್​ನಿಂದ ಬೆಲೆ ಏರಿಕೆ ಬರೆ

ಕಳೆದ ವರ್ಷಕ್ಕೆ ಹೋಲಿಕೆ ಮಾಡಿದರೆ ಕರ್ನಾಟಕದಲ್ಲಿ ಈ ಬಾರಿ ಹಾಲಿನ ಉತ್ಪಾದನೆ ಶೇ.15 ಹೆಚ್ಚಳವಾಗಿದೆ. ಹಿಂದಿನ ವರ್ಷಗಳಲ್ಲಿ ಈ ವೇಳೆಗೆ ನಿತ್ಯ ಸರಾಸರಿ 90 ಲಕ್ಷ ಲೀಟರ್‌ ಉತ್ಪಾದನೆಯಾಗುತ್ತಿದ್ದ ಹಾಲಿನ ಪ್ರಮಾಣ ಈ ಬಾರಿ ಸರಾಸರಿ 99 ಲಕ್ಷ ಲೀಟರ್‌ ಗೆ ಏರಿಕೆಯಾಗಿದೆ. ಹೀಗೆ ಹೆಚ್ಚುವರಿಯಾಗಿ ಉತ್ಪಾದನೆಯಾಗುವ ಹಾಲನ್ನು ರೈತರಿಂದ ಖರೀದಿ ಮಾಡಬೇಕು. ಯಾವುದೇ ಕಾರಣಕ್ಕೂ ಅವರಿಂದ ಹಾಲು ಪಡೆಯಲು ನಿರಾಕರಿಸಬಾರದು ಎಂಬ ಸದುದ್ದೇಶದಿಂದ ಒಂದು ಲೀಟರ್‌ ಹಾಲಿನ ಪ್ಯಾಕೇಟಿಗೆ ಹೆಚ್ಚುವರಿಯಾಗಿ 50 ಮಿ.ಲೀ ಹಾಲನ್ನು ಸೇರಿಸಿ ಈ ಹೆಚ್ಚುವರಿ ಹಾಲಿನ ಬೆಲೆ 2 ರೂಪಾಯಿಯನ್ನು ಮಾತ್ರ ಗ್ರಾಹಕರಿಂದ ಸಂಗ್ರಹಿಸಲಾಗುತ್ತಿದೆ. ಹಾಲಿನ ಬೆಲೆಯಲ್ಲಿ ಯಾವುದೇ ಹೆಚ್ಚಳವಾಗಿರುವುದಿಲ್ಲ ಎಂದು ತಿಳಿಸಿದ್ದಾರೆ.

ಈ ವರೆಗೆ 1,000 ಮಿ.ಲೀ ಹಾಲಿಗೆ ರೂ.42 ಹಾಗೂ 500 ಮಿ.ಲೀ ಹಾಲಿಗೆ ರೂ.22 ದರವನ್ನು ನಿಗದಿಪಡಿಸಲಾಗಿತ್ತು ಇನ್ನು ಮುಂದೆ 1,050 ಮಿ.ಲೀ ಹಾಗೂ 550 ಮಿ.ಲೀ ಹಾಲಿನ ಪ್ಯಾಕೇಟ್‌ ಗಳನ್ನು ಮಾರಾಟ ಮಾಡಲಾಗುತ್ತಿದ್ದು ಅದಕ್ಕೆ ಕ್ರಮವಾಗಿ ರೂ.44 ಹಾಗೂ ರೂ.24 ದರ ನಿಗದಿಪಡಿಸಲಾಗುತ್ತದೆ. ಇದು ನಾಡಿನ ಲಕ್ಷಾಂತರ ಹೈನುಗಾರರ ಹಿತದೃಷ್ಟಿಯಿಂದ ಕೆ.ಎಂ.ಎಫ್‌ ಸಂಸ್ಥೆಯು ತೆಗೆದುಕೊಂಡ ನಿರ್ಣಯವಾಗಿದ್ದು, ಹೆಚ್ಚುವರಿಯಾಗಿ ಉದ್ಪಾದನೆಯಾಗುತ್ತಿರುವ ಹಾಲನ್ನು ಗ್ರಾಹಕರಿಗೆ ನೇರವಾಗಿ ತಲುಪಿಸುವ ಸದುದ್ದೇಶವನ್ನು ಹೊಂದಿದೆ ಎಂದು ಮಾಹಿತಿ ನೀಡಿದ್ದಾರೆ.

ಈಗಾಗಲೇ ಗರಿಷ್ಟ ಪ್ರಮಾಣದ ಹಾಲನ್ನು ಹಾಲಿನ ಪೌಡರ್‌ ತಯಾರಿಕೆ ಮಾಡುವ ಉದ್ದೇಶಕ್ಕೆ ಬಳಕೆ ಮಾಡಲಾಗುತ್ತಿದೆ. ನಿತ್ಯ ಸುಮಾರು 30 ಲಕ್ಷ ಲೀಟರ್‌ ಹಾಲು ಪೌಡರ್‌ ತಯಾರಿಕೆಗಾಗಿ ಬಳಸಲ್ಪಡುತ್ತಿದ್ದು, 250 ಮೆಟ್ರಿಕ್‌ ಟನ್‌ ಹಾಲಿನ ಪೌಡರ್‌ ತಯಾರಿಸಲಾಗುತ್ತಿದೆ. ಇದು ಹಾಲಿನ ಪೌಡರ್‌ ಗೆ ಇರುವ ಬೇಡಿಕೆಗೆ ಅನುಗುಣವಾಗಿದೆ. ನಮ್ಮ ಸರ್ಕಾರ ಅಧಿಕಾರಕ್ಕೆ ಬರುವ ವೇಳೆ ರಾಜ್ಯದಲ್ಲಿ ನಿತ್ಯ ಸರಾಸರಿ 72 ಲಕ್ಷ ಲೀಟರ್‌ ಗಳಷ್ಟು ಹಾಲು ಸಂಗ್ರಹವಾಗುತ್ತಿತ್ತು. ಈ ಹಿಂದೆ ಹಾಲಿನ ಬೆಲೆಯಲ್ಲಿ ರೂ.3 ಹೆಚ್ಚಳ ಮಾಡಿ ಆ ಹೆಚ್ಚುವರಿ ಹಣವನ್ನು ರೈತರಿಗೆ ನೇರವಾಗಿ ವರ್ಗಾಯಿಸುವ ಪ್ರೋತ್ಸಾಹದಾಯಕ ಕ್ರಮ ಕೈಗೊಂಡಿದ್ದರಿಂದ ಹೈನೋದ್ಯಮವು ಹಿಂದಿಗಿಂತ ಲಾಭ ತಂದುಕೊಡುವ ಉದ್ಯೋಗವಾಯಿತು ಜೊತೆಗೆ ಈ ಬಾರಿ ಉತ್ತಮ ಮಳೆಯಾಗಿರುವುದರಿಂದ ಜಾನುವಾರುಗಳಿಗೆ ಹಸಿರು ಮೇವು ಲಭ್ಯವಾಗುತ್ತಿದೆ.ಈ ಎರಡು ಕಾರಣಗಳಿಂದಾಗಿ ರಾಜ್ಯದಲ್ಲಿ ಹಾಲಿನ ಉತ್ಪಾದನೆ ಇಂದು ನಿತ್ಯ ಸರಿಸುಮಾರು 1 ಕೋಟಿ ಲೀಟರ್‌ ತಲುಪುವ ಹಂತಕ್ಕೆ ಬಂದಿದೆ. ಹೀಗೆ ಹೆಚ್ಚುವರಿಯಾಗಿ ಉತ್ಪಾದನೆಯಾಗುತ್ತಿರುವ ಹಾಲನ್ನು ರೈತರಿಂದ ಖರೀದಿಸಿ ಗ್ರಾಹಕರಿಗೂ ಹೊರೆಯಾಗದ ರೀತಿಯಲ್ಲಿ ಮಾರಾಟ ಮಾಡುವ ಸಲುವಾಗಿ ಕೆ.ಎಂ.ಎಫ್‌ ಸಂಸ್ಥೆ ಈ ನಿರ್ಧಾರ ಕೈಗೊಂಡಿದೆ ಎಂದು ಮಾಧ್ಯಮ ಪ್ರಕಟಣೆ ಮೂಲಕ ಸ್ಪಷ್ಟನೆ ನೀಡಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ