
ಬೆಂಗಳೂರು, ಜುಲೈ 28: ಕರ್ನಾಟಕದ ಪ್ರಮುಖ ಜಲಾಶಯಗಳಲ್ಲಿ ನೀರಿನ ಸಂಗ್ರಹದ ಮಟ್ಟದಲ್ಲಿ ಸ್ಪಷ್ಟ ವ್ಯತ್ಯಾಸ ಗೋಚರಿಸುತ್ತಿದ್ದು, ಉತ್ತರ ಕರ್ನಾಟಕ ಮತ್ತು ದಕ್ಷಿಣ ಒಳನಾಡಿನ ನದಿ ಪಾತ್ರಗಳಲ್ಲಿ ಮಿಶ್ರ ವಾತಾವರಣ ಕಂಡುಬಂದಿದೆ. ಕೃಷ್ಣಾ ನದಿ ಪಾತ್ರದ ಆಲಮಟ್ಟಿ ಹಾಗೂ ಬಸವಸಾಗರ ಜಲಾಶಯಗಳು ಭರ್ತಿಯಾಗುವ ಹಂತ ತಲುಪಿದ್ದರೆ, ಕಾವೇರಿ ಕೊಳ್ಳದ ಕೆಆರ್‌ಎಸ್, ಕಬಿನಿ ಹಾಗೂ ಹೇಮಾವತಿ ಜಲಾಶಯಗಳಲ್ಲಿ ಕಳೆದ ವರ್ಷಕ್ಕಿಂತ ನೀರಿನ ಸಂಗ್ರಹ ಗಣನೀಯವಾಗಿ ಕಡಿಮೆಯಾಗಿದೆ.
ವಿಜಯಪುರ ಜಿಲ್ಲೆ ನಿಡಗುಂದಿ ತಾಲೂಕಿನ ಆಲಮಟ್ಟಿ ಬಳಿ ಕೃಷ್ಣಾ ನದಿಗೆ ಅಡ್ಡಲಾಗಿ ನಿರ್ಮಿಸಲಾಗಿರುವ ಲಾಲ್ ಬಹದ್ದೂರ್ ಶಾಸ್ತ್ರಿ ಸಾಗರ ಜಲಾಶಯವು ಭರ್ತಿಯಾಗುವ ಹಂತಕ್ಕೆ ತಲುಪಿದೆ. ಜಲಾಶಯಕ್ಕೆ 55 ಸಾವಿರಕ್ಕೂ ಹೆಚ್ಚು ಕ್ಯೂಸೆಕ್ ನೀರು ಹರಿದು ಬರುತ್ತಿದ್ದು, ಮುನ್ನೆಚ್ಚರಿಕೆ ಕ್ರಮವಾಗಿ ಕೆಳಭಾಗದ ನದಿಗೆ 21,113 ಕ್ಯೂಸೆಕ್ ನೀರನ್ನು ಬಿಡುಗಡೆ ಮಾಡಲಾಗುತ್ತಿದೆ.
ಯಾದಗಿರಿ ಜಿಲ್ಲೆಯ ಹುಣಸಗಿ ತಾಲೂಕಿನ ನಾರಾಯಣಪುರ ಬಳಿಯ ಬಸವಸಾಗರ ಜಲಾಶಯವು ಗರಿಷ್ಠ ಮಟ್ಟದ ಸಮೀಪದಲ್ಲೇ ಮುಂದುವರಿದಿದೆ. ಡ್ಯಾಂಗೆ 25,000 ಕ್ಯೂಸೆಕ್ ನೀರು ಒಳಹರಿವು ದಾಖಲಾಗುತ್ತಿದ್ದು, ಒಳಹರಿವಿನ ಪ್ರಮಾಣ ಹೆಚ್ಚಿರುವ ಕಾರಣ ನದಿಗೆ 20,500 ಕ್ಯೂಸೆಕ್ ನೀರನ್ನು ಹೊರಬಿಡಲಾಗುತ್ತಿದೆ.
ಗರಿಷ್ಠ ಮಟ್ಟ: 2922 ಅಡಿ (37 TMC)
ಇಂದಿನ ಮಟ್ಟ: 2905.98 ಅಡಿ (23.753 TMC)
ಒಳಹರಿವು: 6,390 ಕ್ಯೂಸೆಕ್
ಹೊರಹರಿವು: 500 ಕ್ಯೂಸೆಕ್
ಕಳೆದ ವರ್ಷ ಇದೇ ದಿನ: 2920.89 ಅಡಿ (35.943 TMC)
ಹಾಸನ ತಾಲೂಕಿನ ಗೊರೂರು ಸಮೀಪದ ಹೇಮಾವತಿ ಜಲಾಶಯದಲ್ಲಿ ನೀರಿನ ಮಟ್ಟ ಕಳೆದ ವರ್ಷಕ್ಕೆ ಹೋಲಿಸಿದರೆ ತೀವ್ರ ಕುಸಿತ ಕಂಡಿದೆ. ಕಳೆದ ವರ್ಷ ಇದೇ ಸಮಯದಲ್ಲಿ 35.943 ಟಿಎಂಸಿ ನೀರು ಸಂಗ್ರಹವಿತ್ತು ಮತ್ತು 25,724 ಕ್ಯೂಸೆಕ್ ಒಳಹರಿವಿತ್ತು. ಆದರೆ ಈ ಬಾರಿ ಒಳಹರಿವು ಕೇವಲ 6,390 ಕ್ಯೂಸೆಕ್ ದಾಖಲಾಗಿದ್ದು, ಕೇವಲ 23.753 ಟಿಎಂಸಿ ನೀರು ಮಾತ್ರ ಸಂಗ್ರಹವಾಗಿದೆ.
ಮೈಸೂರು ಜಿಲ್ಲೆಯ ಕಬಿನಿ ಜಲಾಶಯದಲ್ಲೂ ಬರದ ಛಾಯೆ ಎದ್ದು ಕಾಣುತ್ತಿದೆ. ಕಳೆದ ವರ್ಷ ಇದೇ ಅವಧಿಯಲ್ಲಿ 31 ಸಾವಿರಕ್ಕೂ ಹೆಚ್ಚು ಕ್ಯೂಸೆಕ್ ಒಳಹರಿವಿದ್ದು, 40 ಸಾವಿರ ಕ್ಯೂಸೆಕ್ ನೀರನ್ನು ನದಿಗೆ ಹರಿಸಲಾಗುತ್ತಿತ್ತು. ಆದರೆ ಈ ಬಾರಿ ಒಳಹರಿವು ಕೇವಲ 3,594 ಕ್ಯೂಸೆಕ್‌ಗೆ ಸೀಮಿತವಾಗಿದ್ದು, ಸಂಗ್ರಹ ಮಟ್ಟವೂ ಕಡಿಮೆಯಾಗಿದೆ.
ಮಂಡ್ಯ ಜಿಲ್ಲೆಯ ಕೃಷ್ಣರಾಜಸಾಗರ (KRS) ಜಲಾಶಯದಲ್ಲಿ ನೀರಿನ ಮಟ್ಟ ಇನ್ನೂ 100 ಅಡಿ ದಾಟಿಲ್ಲ. ಜಲಾಶಯದ ಒಟ್ಟು ಸಾಮರ್ಥ್ಯ 49.452 ಟಿಎಂಸಿ ಆಗಿದ್ದರೂ, ಪ್ರಸ್ತುತ ಕೇವಲ 17.039 ಟಿಎಂಸಿ ನೀರು ಮಾತ್ರ ಸಂಗ್ರಹವಾಗಿದೆ. ಒಳಹರಿವು ಕೇವಲ 2,552 ಕ್ಯೂಸೆಕ್ ಇದ್ದು, ಕಾವೇರಿ ಜಲಾನಯನ ಪ್ರದೇಶದಲ್ಲಿ ಉತ್ತಮ ಮಳೆಯಾಗುವ ನಿರೀಕ್ಷೆಯಿದೆ.
ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ