ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭೇಟಿಯಾದ ಡಿಸಿಎಂ ಡಿಕೆ ಶಿವಕುಮಾರ್
DK Shivakumar Meets Nirmala Sitharaman: ಸಿಎಂ ಸಿದ್ದರಾಮಯ್ಯ ಅವರು ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಿ ರಾಜ್ಯಕ್ಕೆ ಸಂಬಂಧಿಸಿದ ವಿಚಾರಗಳ ಬಗ್ಗೆ ಚರ್ಚಿಸಿದ ಮರು ದಿನವೇ ಡಿಸಿಎಂ ಡಿಕೆ ಶಿವಕುಮಾರ್ ಅವರು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ. ಇದೇ ವೇಳೆ ಅವರು ಬರ ಪರಿಹಾರ ಬಿಡುಗಡೆ ಮಾಡುವಂತೆ ಮನವಿ ಮಾಡಿದ್ದಾರೆ.
ನವದೆಹಲಿ, ಡಿಸೆಂಬರ್ 20: ಕರ್ನಾಟಕ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ (DK Shivakumar) ದೆಹಲಿಯಲ್ಲಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ (Nirmala Sitharaman) ಅವರನ್ನು ಬುಧವಾರ ಭೇಟಿ ಮಾಡಿ ಮಾತುಕತೆ ನಡೆಸಿದರು. ಇದೇ ವೇಳೆ ಅವರು ರಾಜ್ಯಕ್ಕೆ ಬರ ಪರಿಹಾರ ನೀಡುವಂತೆ ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿದರು. ಜತೆಗೆ, ರಾಜ್ಯದಲ್ಲಿನ ಅಭಿವೃದ್ಧಿ ಯೋಜನೆಗಳು ಹಾಗೂ ಕೇಂದ್ರದಿಂದ ಸಿಗಬೇಕಾದ ಅನುದಾನಗಳಿಗೆ ಸಂಬಂಧಿಸಿ ಮಾತುಕತೆ ನಡೆಸಿದರು.
ಸಿಎಂ ಸಿದ್ದರಾಮಯ್ಯ ಹಾಗೂ ಕಂದಾಯ ಸಚಿವ ಕೃಷ್ಣ ಭೈರೇಗೌಡ ಅವರು ಮಂಗಳವಾರ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದರು. ಮೋದಿ ಜೊತೆ ಕರ್ನಾಟಕದಲ್ಲಿನ ಬರ ಪರಿಸ್ಥಿತಿ ಕುರಿತು ಸಿಎಂ ಸಿದ್ದರಾಮಯ್ಯ ಚರ್ಚೆ ನಡೆಸಿದ್ದು ಶೀಘ್ರವೇ 18,177 ಕೋಟಿ ರೂ. ಪರಿಹಾರ ಬಿಡುಗಡೆ ಮಾಡುವಂತೆ ಮನವಿ ಮಾಡಿದ್ದರು.
ಕರ್ನಾಟಕವು ಈ ವರ್ಷ ಬರ ಪರಿಸ್ಥಿತಿ ಎದುರಿಸುತ್ತಿದ್ದು, ತೀವ್ರ ಸಂಕಷ್ಟದಲ್ಲಿದೆ. ಈ ವಿಚಾರವಾಗಿ ರಾಜ್ಯ ಸರ್ಕಾರದ ಸಚಿವರು ಕೇಂದ್ರ ಸರ್ಕಾರದ ವಿರುದ್ಧ ಹಲವು ಬಾರಿ ವಾಗ್ದಾಳಿ ನಡೆಸಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೇ, ಬರ ಕುರಿತು ಚರ್ಚಿಸಲು ಪ್ರಧಾನಿ ಸಮಯ ನೀಡುತ್ತಿಲ್ಲ ಎಂದು ದೂರಿದ್ದರು. ಈ ಎಲ್ಲ ಬೆಳವಣಿಗೆಗಳ ಬೆನ್ನಲ್ಲೇ ಮೋದಿ ಅವರು ಕರ್ನಾಟಕ ಮುಖ್ಯಮಂತ್ರಿಗಳ ಜತೆ ಮಾತುಕತೆ ನಡೆಸಿದ್ದಾರೆ. ಅಲ್ಲದೆ, ಗೃಹ ಸಚಿವ ಅಮಿತ್ ಶಾ ಅವರಿಗೆ ಸೂಚನೆ ನೀಡಿ ಶೀಘ್ರ ಬರ ಸಂಬಂಧ ಸಭೆ ಕರೆಯಲು ಸೂಚಿಸುವುದಾಗಿಯೂ ಹೇಳಿದ್ದಾರೆ.
ಇದನ್ನೂ ಓದಿ: ಪ್ರಧಾನಿ ನರೇಂದ್ರ ಮೋದಿ ಭೇಟಿಯಾದ ಸಿಎಂ ಸಿದ್ದರಾಮಯ್ಯ, 18,177 ಕೋಟಿ ರೂ. ಪರಿಹಾರ ಬಿಡುಗಡೆ ಮಾಡುವಂತೆ ಮನವಿ
ಈ ಎಲ್ಲ ಬೆಳವಣಿಗೆಗಳ ಮಧ್ಯೆ ಇದೀಗ ಡಿಸಿಎಂ ಡಿಕೆ ಶಿವಕುಮಾರ್ ದೆಹಲಿಯಲ್ಲಿ ಹಣಕಾಸು ಸಚಿವೆಯನ್ನು ಭೇಟಿಯಾಗಿ ಮನವಿ ಸಲ್ಲಿಸಿದ್ದಾರೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 12:59 pm, Wed, 20 December 23