ಬೆಂಗಳೂರು: ಕಳೆದ ಕೆಲವು ವರ್ಷಗಳಿಂದ ಪೊಲೀಸರು ಬಿಜೆಪಿ ಪರ ಇದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಮತ್ತು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ (DK Shivakumar) ಆರೋಪ ಮಾಡಿರುವುದಕ್ಕೆ ಸಂಬಂಧಿಸಿ ಸೃಷ್ಟಿಯಾಗಿರುವ ವಿವಾದಕ್ಕೆ ತೇಪೆ ಹಚ್ಚಲು ಇತ್ತೀಚೆಗಷ್ಟೇ ಡಿಜಿ ಮತ್ತು ಐಜಿಪಿಯಾಗಿ ಅಧಿಕಾರ ವಹಿಸಿಕೊಂಡ ಅಲೋಕ್ ಮೋಹನ್ (DG & IGP Alok Mohan) ಮುಂದಾಗಿದ್ದಾರೆ. ಕೇಸರೀಕರಣದ ಬಗ್ಗೆ ಚರ್ಚೆಯಾಗಿರುವುದು ರಾಜ್ಯ ಸರ್ಕಾರ ಮತ್ತು ಪೊಲೀಸ್ ಇಲಾಖೆಯ ಆಂತರಿಕ ವಿಷಯ ಎಂದು ಅವರು ಗುರುವಾರ ಹೇಳಿದ್ದಾರೆ. ಪೊಲೀಸರು ಮತ್ತು ಸರ್ಕಾರದ ನಡುವಿನ ಸಭೆಯ ಬಗ್ಗೆ ನಾನು ಏನನ್ನೂ ಹೇಳಲಾರೆ ಎಂದು ಅವರು ಪ್ರತಿಕ್ರಿಯಿಸಿದ್ದಾರೆ.
ಪೊಲೀಸ್ ಇಲಾಖೆಯ ಕೇಸರಿಕರಣ ವಿಚಾರವಾಗಿ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಉನ್ನತ ಪೊಲೀಸ್ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡಿರುವುದು ರಾಜಕೀಯ ವಾಕ್ಸಮರಕ್ಕೆ ಕಾರಣವಾಗಿತ್ತು. ಮಂಗಳೂರಿನಲ್ಲಿ ಪೊಲೀಸರೇ ಕೇಸರಿ ಶಾಲು ಹಾಕುತ್ತೀರಿ ಅಂದರೆ ಹೇಗೆ? ಈ ಸಭೆಗೂ ಕೇಸರಿ ಶಾಲು ಹಾಕಿಕೊಂಡೇ ಬರಬೇಕಾಗಿತ್ತು. ನಮ್ಮ ಸರ್ಕಾರದಲ್ಲಿ ಪೊಲೀಸ್ ಇಲಾಖೆಯನ್ನು ಕೇಸರೀಕರಣ ಮಾಡಲು ನಾವು ಬಿಡುವುದಿಲ್ಲ ಎಂದು ಡಿಕೆ ಶಿವಕುಮಾರ್ ಇತ್ತೀಚೆಗೆ ಪೊಲೀಸರಿಗೆ ಎಚ್ಚರಿಕೆ ನೀಡಿದ್ದರು. ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದ್ದ ಬಿಜೆಪಿ ನಾಯಕ ಆರಗ ಜ್ಞಾನೇಂದ್ರ, ಕಾಂಗ್ರೆಸ್ ಸರ್ಕಾರವು ಪೊಲೀಸ್ ಇಲಾಖೆಯನ್ನು ಕಾಂಗ್ರೆಸ್ಸೀಕರಣ ಮಾಡಲು ಹೊರಟಿದೆ ಎಂದು ಟೀಕಿಸಿದ್ದರು.
ಸಾಂವಿಧಾನಾತ್ಮಕವಾಗಿ ಎಲ್ಲಾ ಇಲಾಖೆಗಳಲ್ಲೂ ಪ್ರತೀ ನಾಗರಿಕನಿಗೂ ಧರ್ಮದ ಅನುಷ್ಠಾನದ ಹಕ್ಕಿದೆ. ಹತ್ತಾರು ವರ್ಷಗಳಿಂದ ಎಲ್ಲಾ ಇಲಾಖೆಗಳಲ್ಲೂ ಧಾರ್ಮಿಕ ಆಧಾರದಲ್ಲಿ ಪೂಜೆಗಳು ನಡೆಯುತ್ತಿವೆ. ಇವತ್ತು ಇದನ್ನು ತಡೆಯುವ ಕೆಲಸವನ್ನು ಕಾಂಗ್ರೆಸ್ ಮಾಡುತ್ತಾ ಇದೆ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಟೀಕಿಸಿದ್ದರು. ಇನ್ನೂ ಅನೇಕ ಬಿಜೆಪಿ ನಾಯಕರು ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದರು. ಇದಕ್ಕೆ ಸಂಬಂಧಿಸಿದಂತೆ ಇದೀಗ ಪ್ರತಿಕ್ರಿಯಿಸಿರುವ ಅಲೋಕ್ ಮೋಹನ್, ಆಂತರಿಕ ವಿಷಯ ಎಂದು ಹೇಳಿದ್ದಾರೆ.
ಇದನ್ನೂ ಓದಿ: ಕೇಸರೀಕರಣ Vs ಕಾಂಗ್ರೆಸ್ಸೀಕರಣ; ರಾಜಕೀಯ ಹಗ್ಗಜಗ್ಗಾಟಕ್ಕೆ ಗುರಿಯಾದ ಪೊಲೀಸ್ ಇಲಾಖೆ
ಈ ಮಧ್ಯೆ, ಅಲೋಕ್ ಮೋಹನ್ ಅವರು ಗುರುವಾರ ಬೆಳಿಗ್ಗೆ ಎಲ್ಲಾ ಶ್ರೇಣಿಯ ಪೊಲೀಸ್ ಸಿಬ್ಬಂದಿಯೊಂದಿಗೆ ಸಭೆ ನಡೆಸಿದರು ಮತ್ತು ನಗರದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡಲು ತಮ್ಮ ಕಾರ್ಯಯೋಜನೆಯ ಬಗ್ಗೆ ಚರ್ಚಿಸಿದರು. ಸಭೆಯ ನಂತರ ಮಾಧ್ಯಮದವರನ್ನು ಉದ್ದೇಶಿಸಿ ಮಾತನಾಡಿದ ಅವರು, ನಗರದಲ್ಲಿ ರೌಡಿ ಚಟುವಟಿಕೆಗಳನ್ನು ನಾವು ಸಹಿಸುವುದಿಲ್ಲ ಎಂದು ಹೇಳಿದ್ದಾರೆ.
ನಗರದಲ್ಲಿ ಡ್ರಗ್ಸ್ ಹಾವಳಿ ಕುರಿತು ಪ್ರತಿಕ್ರಿಯಿಸಿದ ಅವರು, ಬೆಂಗಳೂರು ನಗರವನ್ನು ಡ್ರಗ್ಸ್ ಮುಕ್ತ ಮಾಡುವುದು ನಮ್ಮ ಗುರಿ. ಡ್ರಗ್ಸ್ ಹಾವಳಿ ನಿಯಂತ್ರಿಸಲು ಪ್ರದೇಶವಾರು ಕಾರ್ಯಾಚರಣೆ ನಡೆಸುವ ಮೂಲಕ ಅದನ್ನು ಮಟ್ಟಹಾಕಲು ನಾವು ಯೋಜನೆ ರೂಪಿಸುತ್ತೇವೆ ಎಂದು ಅವರು ಹೇಳಿದ್ದಾರೆ.
ಅಲೋಕ್ ಮೋಹನ್ ಅವರು ನಗರದಲ್ಲಿ ಟ್ರಾಫಿಕ್ ಸಮಸ್ಯೆ ಕುರಿತು ಮಾತನಾಡಿ, ವಾಹನ ಸಂಚಾರವನ್ನು ಸಮರ್ಥವಾಗಿ ನಿರ್ವಹಿಸಲು ಸ್ಥಳೀಯ ಪೊಲೀಸರನ್ನು ತೊಡಗಿಸಿಕೊಳ್ಳಲಾಗುವುದು ಎಂದು ಭರವಸೆ ನೀಡಿದ್ದಾರೆ. ಪೊಲೀಸರು ಸಾರ್ವಜನಿಕ ಸ್ನೇಹಿಯಾಗಿ ಕಾರ್ಯನಿರ್ವಹಿಸಲಿದ್ದಾರೆ ಎಂದು ಅವರು ಭರವಸೆ ನೀಡಿದ್ದಾರೆ.