ಬರ ಪರಿಹಾರ ಹೆಚ್ಚಿಸಿ, ರೈತರ ನೆರವಿಗೆ ಧಾವಿಸಲು ಕರ್ನಾಟಕ ಕಾಂಗ್ರೆಸ್ ಸರ್ಕಾರಕ್ಕೆ ಸೂಚಿಸಿ: ರಾಹುಲ್ ಗಾಂಧಿಗೆ ಅಶೋಕ್ ಆಗ್ರಹ

ಕರ್ನಾಟಕದ ಬರ ಪರಿಸ್ಥಿತಿಯ ತೀವ್ರತೆಯನ್ನು ಅರಿಯಲು ರಾಜ್ಯಕ್ಕೆ ಭೇಟಿ ನೀಡಿ ರೈತರಿಗೆ ಹೆಚ್ಚಿನ ಪರಿಹಾರ ಒದಗಿಸುವಂತೆ ರಾಹುಲ್ ಗಾಂಧಿಗೆ ಆರ್. ಅಶೋಕ್ ಪತ್ರ ಬರೆದಿದ್ದಾರೆ. ಪ್ರತಿ ರೈತನಿಗೆ ₹2,500 ಪರಿಹಾರ ಸಾಕಾಗುವುದಿಲ್ಲ ಎಂದು ಟೀಕಿಸಿರುವ ಅವರು, ಬರ ಪರಿಹಾರ ವಿತರಣೆ ಚುರುಕುಗೊಳಿಸಲು ರಾಜ್ಯ ಸರ್ಕಾರಕ್ಕೆ ಸೂಚಿಸುವಂತೆ ಆಗ್ರಹಿಸಿದ್ದಾರೆ.

ಬರ ಪರಿಹಾರ ಹೆಚ್ಚಿಸಿ, ರೈತರ ನೆರವಿಗೆ ಧಾವಿಸಲು ಕರ್ನಾಟಕ ಕಾಂಗ್ರೆಸ್ ಸರ್ಕಾರಕ್ಕೆ ಸೂಚಿಸಿ: ರಾಹುಲ್ ಗಾಂಧಿಗೆ ಅಶೋಕ್ ಆಗ್ರಹ
ಆರ್. ಅಶೋಕ್ ಮತ್ತು ರಾಹುಲ್ ಗಾಂಧಿ
Image Credit source: PTI

Updated on: Oct 14, 2026 | 2:27 PM

ಮುಖ್ಯಾಂಶಗಳು

  • ರೈತರಿಗೆ ಹೆಚ್ಚಿನ ಪರಿಹಾರ ನೀಡಲು ಆರ್. ಅಶೋಕ್ ಆಗ್ರಹ
  • ರಾಹುಲ್ ಗಾಂಧಿ ಕರ್ನಾಟಕಕ್ಕೆ ಭೇಟಿ ನೀಡಲು ಒತ್ತಾಯ
  • ₹2,500 ನೆರವು ಸಾಲದು ಎಂದು ರಾಜ್ಯ ಸರ್ಕಾರದ ವಿರುದ್ಧ ಟೀಕೆ

ಬೆಂಗಳೂರು, ಅಕ್ಟೋಬರ್ 14: ಕರ್ನಾಟಕದ ಬರ ಪರಿಸ್ಥಿತಿಯ ತೀವ್ರತೆಯನ್ನು ಅರಿಯಲು ರಾಜ್ಯಕ್ಕೆ ಭೇಟಿ ನೀಡಿ, ರೈತರಿಗೆ ಹೆಚ್ಚಿನ ಪರಿಹಾರ ಒದಗಿಸುವಂತೆ ಕಾಂಗ್ರೆಸ್ ನಾಯಕ ಹಾಗೂ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಆಗ್ರಹಿಸಿದ್ದಾರೆ. ಈ ಸಂಬಂಧ ಪತ್ರ ಬರೆದಿರುವ ಅವರು, ಬರ ಪರಿಹಾರ ವಿತರಣೆಯಲ್ಲಿ ರಾಜ್ಯ ಸರ್ಕಾರ ವಿಳಂಬ ಮಾಡುತ್ತಿದೆ ಎಂದು ಆರೋಪಿಸಿದ್ದು, ತಕ್ಷಣ ಸಮರೋಪಾದಿಯಲ್ಲಿ ಪರಿಹಾರ ಕಾರ್ಯ ಕೈಗೊಳ್ಳುವಂತೆ ಸೂಚಿಸಬೇಕು ಎಂದು ಮನವಿ ಮಾಡಿದ್ದಾರೆ.

ಕರ್ನಾಟಕವು ಇತ್ತೀಚಿನ ವರ್ಷಗಳಲ್ಲೇ ತೀವ್ರ ಬರ ಪರಿಸ್ಥಿತಿ ಎದುರಿಸುತ್ತಿದೆ. ನೈಋತ್ಯ ಮುಂಗಾರು ಮಳೆಯಲ್ಲಿ ಶೇ 35ರಷ್ಟು ಕೊರತೆಯಾಗಿದ್ದು, ರಾಜ್ಯ ಸರ್ಕಾರ 217 ತಾಲೂಕುಗಳನ್ನು ಬರಪೀಡಿತ ಎಂದು ಘೋಷಿಸಿದೆ. ಸುಮಾರು 47.09 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಬೆಳೆ ನಷ್ಟವಾಗಿದ್ದು, ಅಂದಾಜು ₹46,324.50 ಕೋಟಿ ನಷ್ಟ ಸಂಭವಿಸಿದೆ ಎಂದು ಅಶೋಕ್ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

ಕಾಂಗ್ರೆಸ್ ಸರ್ಕಾರದ ನಡೆಯ ಬಗ್ಗೆ ಅಶೋಕ್ ಆಕ್ಷೇಪ

ಇಷ್ಟೊಂದು ದೊಡ್ಡ ಪ್ರಮಾಣದ ಬೆಳೆ ನಷ್ಟವಾಗಿದ್ದರೂ, ರಾಜ್ಯ ಸರ್ಕಾರ ಪ್ರತಿ ರೈತನಿಗೆ ಕೇವಲ ₹2,500 ಇನ್‌ಪುಟ್ ಸಬ್ಸಿಡಿ ಘೋಷಿಸಿರುವುದು ಸಮರ್ಪಕವಲ್ಲ ಎಂದು ಅವರು ಟೀಕಿಸಿದ್ದಾರೆ. ಬೆಳೆ ನಷ್ಟ, ಹೆಚ್ಚುತ್ತಿರುವ ಕೃಷಿ ಸಾಲ ಮತ್ತು ಉತ್ಪಾದನಾ ವೆಚ್ಚಗಳನ್ನು ಗಮನಿಸಿದರೆ, ರೈತರಿಗೆ ಹೆಚ್ಚಿನ ನೆರವು ನೀಡಬೇಕಿದೆ. ನಾಲ್ಕು ತಿಂಗಳು ಕಳೆದರೂ ರೈತರಿಗೆ ಸಮರ್ಪಕ ಪರಿಹಾರ ತಲುಪಿಲ್ಲ ಎಂದು ಆರೋಪಿಸಿದ್ದಾರೆ.

ಬಿಜೆಪಿ ಸರ್ಕಾರದ ವೇಳ ಕೊಟ್ಟಿದ್ದ ಪರಿಹಾರದ ಅಂಕಿ-ಅಂಶ ಉಲ್ಲೇಖ

ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ಬರ ಪರಿಸ್ಥಿತಿಯ ಸಂದರ್ಭದಲ್ಲಿ ಹೆಚ್ಚಿನ ಪರಿಹಾರ ನೀಡಲಾಗಿತ್ತು ಎಂದು ಅಶೋಕ್ ಪತ್ರದಲ್ಲಿ ತಿಳಿಸಿದ್ದಾರೆ. 2019–20ರಿಂದ 2022–23ರ ಅವಧಿಯಲ್ಲಿ 57.43 ಲಕ್ಷ ಹೆಕ್ಟೇರ್ ಬೆಳೆ ನಷ್ಟಕ್ಕೆ ಸಂಬಂಧಿಸಿದಂತೆ 51.90 ಲಕ್ಷ ರೈತರಿಗೆ ಒಟ್ಟು ₹6,651.15 ಕೋಟಿ ಇನ್‌ಪುಟ್ ಸಬ್ಸಿಡಿ ವಿತರಿಸಲಾಗಿತ್ತು ಎಂದು ಹೇಳಿದ್ದಾರೆ.

ಆ ಅವಧಿಯಲ್ಲಿ ಮಳೆಯಾಶ್ರಿತ ಬೆಳೆಗಳಿಗೆ ಪ್ರತಿ ಹೆಕ್ಟೇರ್‌ಗೆ ₹13,600, ನೀರಾವರಿ ಬೆಳೆಗಳಿಗೆ ₹25,000 ಹಾಗೂ ಬಹುವಾರ್ಷಿಕ ಬೆಳೆಗಳಿಗೆ ₹28,000 ಪರಿಹಾರ ನೀಡಲಾಗಿತ್ತು ಎಂದು ಉಲ್ಲೇಖಿಸಿದ್ದಾರೆ. ಹಿಂದಿನ ಸರ್ಕಾರದ ಅವಧಿಯಲ್ಲಿ ಹೆಚ್ಚಿನ ನೆರವು ನೀಡಲು ಸಾಧ್ಯವಾಗಿದ್ದರೆ, ಈಗಿನ ಸರ್ಕಾರ ಏಕೆ ಹೆಚ್ಚಿನ ಪರಿಹಾರ ನೀಡುತ್ತಿಲ್ಲ ಎಂದು ಪ್ರಶ್ನಿಸಿದ್ದಾರೆ.

ರಾಹುಲ್ ಗಾಂಧಿ ಮಧ್ಯಪ್ರವೇಶಕ್ಕೆ ಆಗ್ರಹ

ಬರಪೀಡಿತ ತಾಲೂಕುಗಳನ್ನು ಗುರುತಿಸುವಲ್ಲಿ ವಿಳಂಬವಾಗಿರುವುದರಿಂದ ರೈತರ ಸಂಕಷ್ಟ ಹೆಚ್ಚಾಗಿದೆ ಎಂದು ಅಶೋಕ್ ಆರೋಪಿಸಿದ್ದಾರೆ. ಬರ ಘೋಷಣೆ ಮತ್ತು ಪರಿಹಾರ ವಿತರಣೆಯಲ್ಲಿ ವಿಳಂಬವಾಗುತ್ತಿರುವ ಕುರಿತು ಕಾಂಗ್ರೆಸ್ ಶಾಸಕರೂ ಕಳವಳ ವ್ಯಕ್ತಪಡಿಸಿದ್ದಾರೆ ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

ಬೆಳೆ ನಷ್ಟದ ಪ್ರಮಾಣಕ್ಕೆ ಅನುಗುಣವಾಗಿ ಹೆಚ್ಚಿನ ಪರಿಹಾರ ನೀಡುವುದು, ಕುಡಿಯುವ ನೀರು ಮತ್ತು ಮೇವು ಕೊರತೆ ನೀಗಿಸುವುದು, ಜಾನುವಾರುಗಳನ್ನು ರಕ್ಷಿಸುವುದು ಹಾಗೂ ಯಾವುದೇ ರೈತ ಪರಿಹಾರದಿಂದ ವಂಚಿತರಾಗದಂತೆ ಕಾಲಮಿತಿಯ ಕಾರ್ಯಯೋಜನೆ ರೂಪಿಸುವುದು ಸೇರಿದಂತೆ ಹಲವು ವಿಚಾರಗಳಿಗೆ ರಾಜ್ಯ ಸರ್ಕಾರ ಉತ್ತರ ನೀಡಬೇಕು ಎಂದು ಆಗ್ರಹಿಸಿದ್ದಾರೆ.

ರಾಹುಲ್ ಗಾಂಧಿ ಅವರು ಬರಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ ರೈತರನ್ನು ನೇರವಾಗಿ ಭೇಟಿಯಾಗಬೇಕು. ತಮ್ಮದೇ ಪಕ್ಷದ ಸರ್ಕಾರದಿಂದ ಉತ್ತರ ಕೇಳಿ, ರೈತರಿಗೆ ಸಮರ್ಪಕ ಹಾಗೂ ಸಕಾಲಿಕ ಪರಿಹಾರ ಒದಗಿಸುವಂತೆ ಸೂಚಿಸಬೇಕು ಎಂದು ಆರ್. ಅಶೋಕ್ ಪತ್ರದಲ್ಲಿ ಒತ್ತಾಯಿಸಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಗಣಪತಿ ಶರ್ಮಾ

ಕೇರಳದ ಕಾಸರಗೋಡು ಮೂಲದ ಕನ್ನಡಿಗ, ಪ್ರಸ್ತುತ ಬೆಂಗಳೂರಿನಲ್ಲಿ ವಾಸ. 14 ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದು, ವರದಿಗಾರಿಕೆ ಅನುಭವದ ಜತೆಗೆ ಬರವಣಿಗೆ, ಅನುವಾದದಲ್ಲಿ ಆಸಕ್ತಿ ಮತ್ತು ಪರಿಣತಿ. ಪ್ರಚಲಿತ ವಿದ್ಯಮಾನಗಳು, ರಾಜ್ಯ-ರಾಷ್ಟ್ರ ರಾಜಕೀಯ, ಉದ್ಯಮ, ವೈಯಕ್ತಿಕ ಹಣಕಾಸು ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ, ಒಲವು. ವಿಜಯ ಕರ್ನಾಟಕ, ಸಮಯ ನ್ಯೂಸ್ ಟಿವಿ, ವಿಜಯವಾಣಿ, ಪ್ರಜಾವಾಣಿ ಪತ್ರಿಕೆಗಳು ಹಾಗೂ ಡಿಜಿಟಲ್ ಮೀಡಿಯಾದಲ್ಲಿ ಕೆಲಸ ಮಾಡಿದ ಅನುಭವ. 2022 ರಿಂದ ಟಿವಿ9 ಕನ್ನಡ ಡಿಜಿಟಲ್​ನಲ್ಲಿ ಕಾರ್ಯನಿರ್ವಹಣೆ.

Read More
Loading...
Unable to load recommendations.
Follow Us